court
ಬೆಳ್ಳಾರೆ: ಪೊಲೀಸರ ಭೇಟೆಗೆ ಸಿಕ್ಕಿಬಿದ್ದ ಮನೆಗಳ್ಳ; ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿಗೆ ಜೈಲು ಶಿಕ್ಷೆ!
ಮನೆಗಳ್ಳತನ ನಡೆಸಿ ಕಾನೂನಿನ ಕಣ್ಣು ತಪ್ಪಿಸಿ ಓಡಾಡುತ್ತಿದ್ದ ಆರೋಪಿಗೆ ಕೊನೆಗೂ ನ್ಯಾಯಾಲಯವು ಶಿಕ್ಷೆಯ ಬಿಸಿ ಮುಟ್ಟಿಸಿದೆ. ವಿಚಾರಣೆಗೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಆರೋಪಿ ಶರತ್‌ಗೆ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿ ಮಾನ್ಯ ನ್ಯಾಯಾಲಯ ಮಹತ್ವದ ಆದೇಶ ನೀಡಿದೆ.
ಕಳೆದ 24.03.2022 ರಂದು ಬೆಳ್ಳಾರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದ್ದ ಮನೆಗಳ್ಳತನ ಪ್ರಕರಣದಲ್ಲಿ (ಅ ಕ್ರ ಸಂಖ್ಯೆ: 22/2022) ಬೆಳ್ತಂಗಡಿಯ ನೆರಿಯ ನಿವಾಸಿ ಶರತ್ ಎಸ್ (24) ಎಂಬಾತ ಪ್ರಮುಖ ಆರೋಪಿಯಾಗಿದ್ದನು. ಈತನ ವಿರುದ್ಧ ಐಪಿಸಿ ಕಲಂ 457 (ರಾತ್ರಿ ವೇಳೆ ಮನೆಗೆ ನುಗ್ಗಿ ಕಳ್ಳತನ) ಮತ್ತು 380 (ಕಳ್ಳತನ) ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಜಾಮೀನು ಪಡೆದ ಬಳಿಕ ಆರೋಪಿಯು ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ದೀರ್ಘಕಾಲ ತಲೆಮರೆಸಿಕೊಂಡಿದ್ದನು.
ಬೆಳ್ಳಾರೆ ಠಾಣಾ ಪಿ.ಎಸ್.ಐ ಹಾಗೂ ಸಿಬ್ಬಂದಿಗಳು ಸತತ ಕಾರ್ಯಾಚರಣೆ ನಡೆಸಿ ತಲೆಮರೆಸಿಕೊಂಡಿದ್ದ ಆರೋಪಿಯನ್ನು ದಸ್ತಗಿರಿ ಮಾಡುವಲ್ಲಿ ಯಶಸ್ವಿಯಾಗಿದ್ದರು. ತನಿಖಾಧಿಕಾರಿ ಸಂತೋಷ ಬಿ.ಪಿ (ಪಿ.ಎಸ್.ಐ) ರವರು ವೈಜ್ಞಾನಿಕ ಸಾಕ್ಷ್ಯಗಳನ್ನು ಕಲೆಹಾಕಿ ನ್ಯಾಯಾಲಯಕ್ಕೆ ಅಂತಿಮ ವರದಿ ಸಲ್ಲಿಸಿದ್ದರು.
ಮಾನ್ಯ ನ್ಯಾಯಾಧೀಶರಾದ ಶಿವಣ್ಣ ಹೆಚ್.ಆರ್ ರವರ ಮುಂದೆ ಪ್ರಕರಣದ ವಿಚಾರಣೆ ನಡೆದಿದ್ದು, ಸರ್ಕಾರದ ಪರವಾಗಿ ಸಹಾಯಕ ಸರ್ಕಾರಿ ಅಭಿಯೋಜಕಿ ಪ್ರೀತಿ ಎಂ.ಸಿ ರವರು ಪ್ರಬಲವಾಗಿ ವಾದ ಮಂಡಿಸಿದರು. ವಾದ-ಪ್ರತಿವಾದಗಳನ್ನು ಆಲಿಸಿದ ನ್ಯಾಯಾಲಯವು ಆರೋಪಿಗೆ ಮನೆಗಳ್ಳತನಕ್ಕೆ (IPC 457): 6 ತಿಂಗಳ ಸಾಧಾರಣ ಸಜೆ ಹಾಗೂ 500 ರೂ. ದಂಡ. ಕಳ್ಳತನಕ್ಕೆ (IPC 380): 10 ತಿಂಗಳ ಸಾಧಾರಣ ಸಜೆ ಹಾಗೂ 500 ರೂ. ದಂಡ.ದಂಡ ಪಾವತಿಸಲು ತಪ್ಪಿದಲ್ಲಿ ಹೆಚ್ಚುವರಿ 10 ದಿನಗಳ ಕಾಲ ಜೈಲು ಶಿಕ್ಷೆ. ವಿಧಿಸಿದೆ:
ನ್ಯಾಯಾಲಯಕ್ಕೆ ಗೈರಾದದ್ದಕ್ಕೆ ಮತ್ತೊಂದು ಬರೆ!
ಕೇವಲ ಕಳ್ಳತನ ಮಾತ್ರವಲ್ಲದೆ, ನ್ಯಾಯಾಲಯದ ಸಮನ್ಸ್‌ಗೆ ಗೌರವ ನೀಡದೆ ತಲೆಮರೆಸಿಕೊಂಡಿದ್ದಕ್ಕಾಗಿ ಆರೋಪಿಯ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) ಕಲಂ 269 ರ ಅಡಿಯಲ್ಲಿ ಪ್ರತ್ಯೇಕ ಪ್ರಕರಣ ದಾಖಲಿಸಲಾಗಿತ್ತು. ಈ ಸಂಬಂಧ ನ್ಯಾಯಾಲಯವು ಹೆಚ್ಚುವರಿಯಾಗಿ 1,000 ರೂ. ದಂಡ ಅಥವಾ 10 ದಿನಗಳ ಕಾರಾಗೃಹ ವಾಸ ವಿಧಿಸಿ ಆದೇಶಿಸಿದೆ.
court
ವಕೀಲರ ರಕ್ಷಣೆಗಾಗಿ ಆಗ್ರಹ: ನಾಳೆ (ನವೆಂಬರ್ 3) ರಾಜ್ಯಾದ್ಯಂತ ನ್ಯಾಯಾಲಯ ಕಲಾಪಗಳಿಂದ ವಕೀಲರು ದೂರ ಉಳಿಯಲು ಕರೆ.
ಬೆಂಗಳೂರು: ವಕೀಲರ ಮೇಲೆ ನಡೆಯುತ್ತಿರುವ ಸರಣಿ ಹಲ್ಲೆಗಳು ಮತ್ತು ಕೊಲೆಗಳನ್ನು ಖಂಡಿಸಿ ಹಾಗೂ ಕಟ್ಟುನಿಟ್ಟಿನ ‘ವಕೀಲರ ರಕ್ಷಣಾ ಕಾಯ್ದೆ’ (Advocates Protection Act) ಜಾರಿಗೆ ಒತ್ತಾಯಿಸಿ, ದಿ ವಕೀಲರ ಅಸೋಸಿಯೇಷನ್ ಬೆಂಗಳೂರು (The Advocates’ Association, Bengaluru) ವತಿಯಿಂದ ನಾಳೆ ಅಂದರೆ ನವೆಂಬರ್ 3, 2026ರ ಮಂಗಳವಾರ ರಾಜ್ಯಾದ್ಯಂತ ನ್ಯಾಯಾಲಯ ಕಲಾಪಗಳಿಂದ ವಕೀಲರು ಸಂಪೂರ್ಣವಾಗಿ ದೂರ ಉಳಿದು (Abstain from work) ಪ್ರತಿಭಟಿಸಲು ಕರೆ ನೀಡಲಾಗಿದೆ.

ಇತ್ತೀಚೆಗೆ ವೈಟ್‌ಫೀಲ್ಡ್‌ನ ವಕೀಲರಾದ ಮಂಜುನಾಥ್ ಮತ್ತು ಅನ್ನಪೂರ್ಣೇಶ್ವರಿ ನಗರದ ಶ್ರೀರಾಮ್ ಅವರ ಬರ್ಬರ ಕೊಲೆ ಹಾಗೂ ಗೌರಿಬಿದನೂರಿನ ವಕೀಲ ವೆಂಕಟರಮಣ ಸನ್ನಕಿ ಅವರ ಮೇಲಿನ ಹತ್ಯೆ ಯತ್ನದ ಘಟನೆಗಳನ್ನು ಅಸೋಸಿಯೇಷನ್ ತೀವ್ರವಾಗಿ ಖಂಡಿಸಿದೆ. ವಕೀಲರಿಗೆ ವೃತ್ತಿಯಲ್ಲಿ ಸೂಕ್ತ ಭದ್ರತೆ ಇಲ್ಲದಿರುವುದನ್ನು ವಿರೋಧಿಸಿ ಮತ್ತು ವಕೀಲರ ರಕ್ಷಣಾ ಕಾಯ್ದೆಯನ್ನು ಬಲಪಡಿಸುವಂತೆ ಒತ್ತಾಯಿಸಿ ಅಕ್ಟೋಬರ್ 29ರಂದು ನಡೆದ ಸರ್ವಸಭೆಯ ಸಭೆಯಲ್ಲಿ ಈ ನಿರ್ಣಯ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ, ನವೆಂಬರ್ 3ರಂದು ಮಂಗಳವಾರದಂದು ಕರ್ತವ್ಯದಿಂದ ದೂರ ಉಳಿಯುವಂತೆ ನಿರ್ಧರಿಸಲಾಗಿದ್ದು, ರಾಜ್ಯದ ಎಲ್ಲಾ ವಕೀಲರ ಸಂಘಗಳು ಈ ಪ್ರತಿಭಟನೆಯಲ್ಲಿ ಭಾಗವಹಿಸಿ ಸಹಕರಿಸುವಂತೆ ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ಸುಬ್ಬಾರೆಡ್ಡಿ, ಪ್ರಧಾನ ಕಾರ್ಯದರ್ಶಿ ಹೆಚ್.ವಿ. ಪ್ರವೀಣ್ ಗೌಡ, ಉಪಾಧ್ಯಕ್ಷ ಗಿರೀಶ್ ಕುಮಾರ್ ಸಿ.ಎಸ್. ಹಾಗೂ ಖಚಾಂಚಿ ಶ್ವೇತಾ ರವಿಶಂಕರ್ ಮನವಿ ಮಾಡಿದ್ದಾರೆ
Bantawala
ಫರಂಗಿಪೇಟೆ ಸ್ಟುಡಿಯೋ ಮಾಲೀಕರ ಮೇಲೆ ಕೊಲೆಯತ್ನ ಪ್ರಕರಣ: ನಾಲ್ವರು ಆರೋಪಿಗಳಿಗೆ 7 ವರ್ಷ ಜೈಲು ಶಿಕ್ಷೆ, ದಂಡ
ಮಂಗಳೂರು: ಬಂಟ್ವಾಳ ತಾಲೂಕಿನ ಫರಂಗಿಪೇಟೆಯಲ್ಲಿ ಸ್ಟುಡಿಯೋ ಮಾಲೀಕರೊಬ್ಬರ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಆರೋಪಿಗಳಿಗೆ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಏಳು ವರ್ಷಗಳ ಕಠಿಣ ಜೈಲು ಶಿಕ್ಷೆ ಹಾಗೂ ಒಟ್ಟು ₹88,000 ದಂಡ ವಿಧಿಸಿ ತೀರ್ಪು ನೀಡಿದೆ.
ಮಹಮ್ಮದ್ ಸೈಫುದಿನ್, ಮಹಮ್ಮದ್ ಅರ್ಷಾದ್, ಅಬ್ದುಲ್ ರಹಿಮಾನ್ ಅಲಿಯಾಸ್ ಮುನ್ನಿ ಹಾಗೂ ಮಹಮ್ಮದ್ ಸವಾದ್ ಶಿಕ್ಷೆಗೆ ಗುರಿಯಾದ ಆರೋಪಿಗಳು.
ಘಟನೆಯ ವಿವರ:
2020ರ ಅಕ್ಟೋಬರ್ 28ರಂದು ಸಂಜೆ ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಫರಂಗಿಪೇಟೆಯಲ್ಲಿ ಈ ಘಟನೆ ನಡೆದಿತ್ತು. ಸ್ಥಳೀಯ ಸ್ಟುಡಿಯೋ ಮಾಲೀಕ ದಿನೇಶ್ ಅವರು ತಮ್ಮ ಅಂಗಡಿಯಲ್ಲಿದ್ದ ವೇಳೆ, ಪೂರ್ವದ್ವೇಷದ ಹಿನ್ನೆಲೆಯಲ್ಲಿ ಅಲ್ಲಿಗೆ ಬಂದ ಆರೋಪಿಗಳು ಕತ್ತಿಯಿಂದ ಭೀಕರವಾಗಿ ಹಲ್ಲೆ ನಡೆಸಿ ಕೊಲೆಗೆ ಯತ್ನಿಸಿದ್ದರು.
ಈ ಕುರಿತು ಬಂಟ್ವಾಳ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 103/2020ರ ಅಡಿಯಲ್ಲಿ ಭಾರತೀಯ ದಂಡ ಸಂಹಿತೆಯ (IPC) ಕಲಂ 307 (ಕೊಲೆಯತ್ನ), 324, 326, 504, 506 ಹಾಗೂ 34ರ ಅಡಿಯಲ್ಲಿ ಪ್ರಕರಣ ದಾಖಲಾಗಿತ್ತು.
ತನಿಖೆ ಮತ್ತು ನ್ಯಾಯಾಲಯದ ತೀರ್ಪು:
ಪ್ರಕರಣದ ತನಿಖೆ ನಡೆಸಿದ್ದ ಅಂದಿನ ಬಂಟ್ವಾಳ ಗ್ರಾಮಾಂತರ ಪೊಲೀಸ್ ಉಪನಿರೀಕ್ಷಕರಾದ (PSI) ಪ್ರಸನ್ನ ಎಂ.ಎಸ್. ಅವರು ನಾಲ್ವರನ್ನೂ ಬಂಧಿಸಿ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ (ಚಾರ್ಜ್‌ಶೀಟ್) ಸಲ್ಲಿಸಿದ್ದರು.
ವಿಚಾರಣೆ ನಡೆಸಿದ ಮಂಗಳೂರಿನ 2ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶರಾದ ಜಗದೀಶ್ ವಿ.ಎನ್. ಅವರು ಆರೋಪಿಗಳ ಮೇಲಿನ ಅಪರಾಧ ಸಾಬೀತಾದ ಹಿನ್ನೆಲೆಯಲ್ಲಿ 2026ರ ಅಕ್ಟೋಬರ್ 28ರಂದು ತೀರ್ಪು ಪ್ರಕಟಿಸಿದ್ದು, ಏಳು ವರ್ಷಗಳ ಜೈಲು ಶಿಕ್ಷೆ ಮತ್ತು ₹88 ಸಾವಿರ ದಂಡ ವಿಧಿಸಿದ್ದಾರೆ.
ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸರ್ಕಾರಿ ಅಭಿಯೋಜಕಿ ಜ್ಯೋತಿ ನಾಯಕ್ ಅವರು ವಾದ ಮಂಡಿಸಿದ್ದರು.
BJP
ಸುಪ್ರೀಂ ಕೋರ್ಟ್‌ಗೆ ಸುಳ್ಳು ಮಾಹಿತಿ ನೀಡಿದ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಪ್ರಶಾಂತ್ ಭೂಷಣ್ ಆಗ್ರಹ
ಹೊಸದೆಹಲಿ: ಸುಪ್ರೀಂ ಕೋರ್ಟ್‌ಗೆ ಸುಳ್ಳು ಅಫಿಡವಿಟ್ ಸಲ್ಲಿಸಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.
ಚುನಾವಣಾ ಆಯೋಗ (ಇಸಿ) ಕೈಗೊಂಡ ಎಲ್ಲಾ ನಿರ್ಧಾರಗಳಿಗೂ ಸಂಪೂರ್ಣ ಆಯೋಗದ (ಮೂವರೂ ಆಯುಕ್ತರ) ಅನುಮೋದನೆ ಇತ್ತು ಎಂದು ಸುಪ್ರೀಂ ಕೋರ್ಟ್‌ಗೆ ನೀಡಿರುವ ಪ್ರಮಾಣಪತ್ರ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ ಎಂದು ಅವರು ಆರೋಪಿಸಿದ್ದಾರೆ.
‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಉಲ್ಲೇಖಿಸಿ ಆರೋಪ
“ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗ ಹೇಳಿರುವುದು ಸಂಪೂರ್ಣ ಅಸತ್ಯ. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ದಿನಪತ್ರಿಕೆ ಬಹಿರಂಗಪಡಿಸಿರುವ ವರದಿಯ ಪ್ರಕಾರ, ಇತರ ಚುನಾವಣಾ ಆಯುಕ್ತರು ದಾಖಲಿಸಿರುವ ಭಿನ್ನಾಭಿಪ್ರಾಯದ ಟಿಪ್ಪಣಿಗಳು ಹಾಗೂ ಅವರು ಕ್ಯಾಬಿನೆಟ್ ಕಾರ್ಯದರ್ಶಿಗೆ ಸಲ್ಲಿಸಿರುವ ದೂರುಗಳೇ ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ” ಎಂದು ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.
ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಆಯೋಗದ ಸಮರ್ಥನೆ
ಸಾಮಾಜಿಕ ಕಾರ್ಯಕರ್ತ ರಾಕೇಶ್ ಕುಮಾರ್ ಸಿಂಗ್ ಅವರು ಚುನಾವಣಾ ಆಯೋಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸೋಮವಾರ (ಅಕ್ಟೋಬರ್ 26) ಉತ್ತರಿಸಿದ ಆಯೋಗವು, “ಎಲ್ಲಾ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಮೂವರು ಆಯುಕ್ತರ ಒಮ್ಮತದ ತೀರ್ಮಾನದಿಂದಲೇ ತೆಗೆದುಕೊಳ್ಳಲಾಗಿದೆ” ಎಂದು ಪ್ರಮಾಣಪತ್ರ ಸಲ್ಲಿಸಿತ್ತು.
ಅಲ್ಲದೆ, “ಆಯುಕ್ತರು ವ್ಯಕ್ತಪಡಿಸುವ ಅವಲೋಕನಗಳು, ಸಲಹೆಗಳು ಮತ್ತು ಪ್ರಶ್ನೆಗಳು ಅವರ ವೈಯಕ್ತಿಕ ಅಭಿಪ್ರಾಯಗಳಷ್ಟೇ ಹೊರತು, ಅವು ಆಯೋಗದ ಅಂತಿಮ ನಿರ್ಧಾರಗಳಲ್ಲ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಕಾನೂನುಬದ್ಧವಾಗಿದ್ದು, ಅರ್ಜಿದಾರರ ಆರೋಪಗಳು ತಪ್ಪು ತಿಳುವಳಿಕೆಯಿಂದ ಕೂಡಿವೆ” ಎಂದು ಆಯೋಗ ವಾದಿಸಿತ್ತು.
10 ತಿಂಗಳಲ್ಲಿ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದ ಆಯುಕ್ತರು
ಆದರೆ, ಮಾಧ್ಯಮ ವರದಿಗಳ ಪ್ರಕಾರ, ಕಳೆದ 10 ತಿಂಗಳುಗಳಲ್ಲಿ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ತಮಗೆ ಮುಂಚಿತವಾಗಿ ಯಾವುದೇ ಮಾಹಿತಿ ನೀಡದೆ ಆಯೋಗದ ಹೆಸರಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆಕ್ಷೇಪಿಸಿ ಸುಮಾರು 14 ಬಾರಿ ಆಕ್ಷೇಪಣಾ ಟಿಪ್ಪಣಿಗಳನ್ನು ದಾಖಲಿಸಿದ್ದಾರೆ. ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಪ್ರಶಾಂತ್ ಭೂಷಣ್ ಅವರು ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
