Connect with us

Politics

‘ಅಧಿಕಾರ ತಾತ್ಕಾಲಿಕ, ಸಿದ್ಧಾಂತವೇ ಶಾಶ್ವತ’: ಸಿದ್ದರಾಮಯ್ಯ ರಾಜೀನಾಮೆ ಬೆನ್ನಲ್ಲೇ ರಾಹುಲ್ ಗಾಂಧಿ ಹಳೆಯ ವಿಡಿಯೋ ವೈರಲ್!

Published

on

ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ರಾಜೀನಾಮೆ ಕುರಿತಾದ ಬೆಳವಣಿಗೆಗಳು ತೀವ್ರ ಚರ್ಚೆಗೆ ಗ್ರಾಸವಾಗಿರುವ ಬೆನ್ನಲ್ಲೇ, ಸಾಮಾಜಿಕ ಜಾಲತಾಣಗಳಲ್ಲಿ ಹಳೆಯ ವಿಡಿಯೋವೊಂದು ಭಾರಿ ಸದ್ದು ಮಾಡುತ್ತಿದೆ. ಎಐಸಿಸಿ ನಾಯಕ ರಾಹುಲ್ ಗಾಂಧಿ, ಸಿದ್ದರಾಮಯ್ಯ ಹಾಗೂ ಎಐಸಿಸಿ ಅಧ್ಯಕ್ಷ ಎಂ. ಮಲ್ಲಿಕಾರ್ಜುನ ಖರ್ಗೆ ಅವರು ಕಾರಿನಲ್ಲಿ ಪ್ರಯಾಣಿಸುತ್ತಾ ‘ಅಧಿಕಾರ ಮತ್ತು ಸಿದ್ಧಾಂತ’ದ ಬಗ್ಗೆ ಚರ್ಚಿಸಿರುವ ವಿಡಿಯೋ ಈಗ ಮತ್ತೆ ಮುನ್ನೆಲೆಗೆ ಬಂದಿದೆ.

ಏನಿದೆ ವೈರಲ್ ವಿಡಿಯೋದಲ್ಲಿ?

ರಾಹುಲ್ ಗಾಂಧಿ ಅವರ ಅಧಿಕೃತ ಸೋಷಿಯಲ್ ಮೀಡಿಯಾ ಪೇಜ್‌ಗಳಲ್ಲಿ ಈ ಹಿಂದೆ ಹಂಚಿಕೊಳ್ಳಲಾಗಿದ್ದ ಈ ಸಂವಾದದಲ್ಲಿ, ರಾಹುಲ್ ಗಾಂಧಿ ಅವರು “ಅಧಿಕಾರ ಮುಖ್ಯವೋ ಅಥವಾ ಸಿದ್ಧಾಂತ ಮುಖ್ಯವೋ?” ಎಂಬ ಪ್ರಶ್ನೆಯನ್ನು ಸಿದ್ದರಾಮಯ್ಯ ಅವರ ಮುಂದಿಡುತ್ತಾರೆ.

ಇದಕ್ಕೆ ತಕ್ಷಣವೇ ಉತ್ತರಿಸುವ ಸಿದ್ದರಾಮಯ್ಯ, “ಯಾವಾಗಲೂ ಸಿದ್ಧಾಂತವೇ ಮುಖ್ಯ. ನಾವು ಜನರ ಮುಂದೆ ಪಕ್ಷದ ಸಿದ್ಧಾಂತ ಮತ್ತು ಕಾರ್ಯಕ್ರಮಗಳನ್ನು ಇಡಬೇಕು. ಅಧಿಕಾರದಲ್ಲಿದ್ದಾಗ ನಮ್ಮ ಸಾಧನೆಗಳನ್ನು ಜನರಿಗೆ ಮನವರಿಕೆ ಮಾಡಿಕೊಡಬೇಕು. ಆಗಷ್ಟೇ ಜನ ನಮ್ಮ ನಿಲುವನ್ನು ಪ್ರಶಂಸಿಸುತ್ತಾರೆ ಮತ್ತು ನಮ್ಮನ್ನು ಆಶೀರ್ವದಿಸುತ್ತಾರೆ” ಎಂದು ಇಂಗ್ಲಿಷ್‌ನಲ್ಲಿ ಉತ್ತರಿಸಿದ್ದಾರೆ.

ಖರ್ಗೆ-ರಾಹುಲ್ ಧ್ವನಿ:

ಸಿದ್ದರಾಮಯ್ಯ ಅವರ ಮಾತಿಗೆ ಧ್ವನಿಗೂಡಿಸುವ ಮಲ್ಲಿಕಾರ್ಜುನ ಖರ್ಗೆ ಅವರು, “ಅಧಿಕಾರ ಎನ್ನುವುದು ಬರುತ್ತದೆ, ಹೋಗುತ್ತದೆ. ಆದರೆ ಸಿದ್ಧಾಂತಕ್ಕೆ ಬದ್ಧವಾಗಿ ಉಳಿಯುವುದು ದೊಡ್ಡ ವಿಷಯ. ಇದಕ್ಕಾಗಿ ನಮ್ಮ ನಾಯಕರು ತ್ಯಾಗ ಮಾಡಿದ್ದಾರೆ” ಎಂದು ಹಿಂದಿಯಲ್ಲಿ ಹೇಳಿದ್ದಾರೆ.

ಬಳಿಕ ಮಾತನಾಡುವ ರಾಹುಲ್ ಗಾಂಧಿ, “ಯಾವುದೇ ದೊಡ್ಡ ಸಂಘಟನೆಯು ಸಿದ್ಧಾಂತದ ಸ್ಪಷ್ಟ ತಿಳುವಳಿಕೆ ಇಲ್ಲದೆ ಅಧಿಕಾರದ ಕಡೆಗೆ ಹೋಗಲು ಸಾಧ್ಯವಿಲ್ಲ. ನಮ್ಮ ಸಿದ್ಧಾಂತವು ಬಡವರ, ಮಹಿಳೆಯರ ಪರ ಹಾಗೂ ಎಲ್ಲರನ್ನೂ ಸಮಾನವಾಗಿ ಕಾಣುವ ಬಹುತ್ವದ ಸಿದ್ಧಾಂತವಾಗಿದೆ” ಎಂದು ವಿಶ್ಲೇಷಿಸಿದ್ದಾರೆ.

ವಿಡಿಯೋದ ಅಸಲಿ ಸಂದರ್ಭವೇನು?

ಪ್ರಸ್ತುತ ರಾಜಕೀಯ ವಿದ್ಯಮಾನಗಳ ನಡುವೆ ಈ ವಿಡಿಯೋ ಈಗಿನದ್ದು ಎಂಬಂತೆ ಹರಿದಾಡುತ್ತಿದೆಯಾದರೂ, ಇದು ಸದ್ಯದ ವಿಡಿಯೋ ಅಲ್ಲ. 2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕರು ಒಟ್ಟಾಗಿ ಪ್ರಚಾರಕ್ಕೆ ತೆರಳುತ್ತಿದ್ದ ವೇಳೆ ಕಾರಿನೊಳಗೆ ನಡೆದಿದ್ದ ಆತ್ಮೀಯ ಸಂವಾದದ ತುಣುಕು ಇದಾಗಿದೆ.

ಈಗ ಏಕೆ ವೈರಲ್?

ರಾಜ್ಯದಲ್ಲಿ ಉಂಟಾಗಿರುವ ಪ್ರಸ್ತುತ ರಾಜಕೀಯ ಏರುಪೇರುಗಳು ಮತ್ತು ಸಿಎಂ ರಾಜೀನಾಮೆ ಕುರಿತಾದ ಚರ್ಚೆಗಳ ಬೆನ್ನಲ್ಲೇ, ನೆಟ್ಟಿಗರು ಹಾಗೂ ರಾಜಕೀಯ ವಿಶ್ಲೇಷಕರು ಈ ಹಳೆಯ ವಿಡಿಯೋವನ್ನು ಮತ್ತೆ ಶೇರ್ ಮಾಡುತ್ತಿದ್ದಾರೆ. “ಅಧಿಕಾರ ಬರುತ್ತದೆ, ಹೋಗುತ್ತದೆ, ಸಿದ್ಧಾಂತವೇ ಮುಖ್ಯ” ಎಂಬ ನಾಯಕರ ಅಂದಿನ ಮಾತುಗಳು ಇಂದಿನ ರಾಜಕೀಯ ಪರಿಸ್ಥಿತಿಗೆ ಅತ್ಯಂತ ಪ್ರಸ್ತುತವಾಗಿವೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕ ಕಮೆಂಟ್‌ಗಳು ವ್ಯಕ್ತವಾಗುತ್ತಿವೆ.

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

award

ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಐತಿಹಾಸಿಕ ಮಾನ್ಯತೆ: ಕರಾವಳಿಯಲ್ಲಿ ಹಬ್ಬದ ವಾತಾವರಣ

Published

on

ಮಂಗಳೂರು: ತುಳು ಭಾಷಿಕರ ಹಲವು ದಶಕಗಳ ಹೋರಾಟ ಹಾಗೂ ಬಹುದಿನಗಳ ನಿರೀಕ್ಷೆಗೆ ಕೊನೆಗೂ ಐತಿಹಾಸಿಕ ಜಯ ಸಿಕ್ಕಿದೆ. ಶ್ರೀಮಂತ ಪರಂಪರೆಯ ತುಳು ಭಾಷೆಗೆ ಕರ್ನಾಟಕದ ಎರಡನೇ ಅಧಿಕೃತ ಭಾಷೆಯ ಮಾನ್ಯತೆ ನೀಡುವುದಾಗಿ ರಾಜ್ಯ ಸರ್ಕಾರ ಅಧಿಕೃತವಾಗಿ ಘೋಷಿಸಿದೆ.

ಮಂಗಳೂರಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯ ಬಳಿಕ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಸುದ್ದಿಗೋಷ್ಠಿಯಲ್ಲಿ ಈ ಮಹತ್ವದ ತೀರ್ಮಾನವನ್ನು ಪ್ರಕಟಿಸಿದರು.

ಸಂವಿಧಾನದ 8ನೇ ಪರಿಚ್ಛೇದ ಸೇರ್ಪಡೆಗೆ ಬಲ: ಪಂಚ ದ್ರಾವಿಡ ಭಾಷೆಗಳಲ್ಲಿ ಒಂದಾಗಿರುವ ತುಳು, ಪ್ರಾಚೀನ ಹಾಗೂ ಆಧುನಿಕ ಸಾಹಿತ್ಯಿಕ ಸಮೃದ್ಧತೆಯನ್ನು ಹೊಂದಿರುವ ಅಪೂರ್ವ ಭಾಷೆಯಾಗಿದೆ. ರಾಜ್ಯ ಸರ್ಕಾರದಿಂದ ಎರಡನೇ ಅಧಿಕೃತ ಭಾಷಾ ಸ್ಥಾನಮಾನ ಲಭಿಸಿರುವುದು, ಭಾರತೀಯ ಸಂವಿಧಾನದ 8ನೇ ಪರಿಚ್ಛೇದಕ್ಕೆ ತುಳು ಭಾಷೆಯನ್ನು ಸೇರ್ಪಡೆಗೊಳಿಸುವ ಹೋರಾಟಕ್ಕೆ ಮತ್ತಷ್ಟು ಪ್ರಬಲ ವೇದಿಕೆಯಾಗಲಿದೆ.

ನಿರಂತರ ಹೋರಾಟಕ್ಕೆ ಸಿಕ್ಕ ಫಲ: ಕರಾವಳಿ ಭಾಗದ ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಪ್ರಮುಖವಾಗಿ ಮಾತನಾಡುವ ತುಳುವಿಗೆ ಹೆಚ್ಚುವರಿ ಅಧಿಕೃತ ಭಾಷಾ ಮಾನ್ಯತೆ ನೀಡಬೇಕೆಂದು ದಶಕಗಳಿಂದ ತುಳು ಸಾಹಿತ್ಯ ಅಕಾಡೆಮಿ, ತುಳು ಪರ ಸಂಘಟನೆಗಳು, ಸಾಹಿತಿಗಳು ಹಾಗೂ ಸ್ಥಳೀಯ ಜನಪ್ರತಿನಿಧಿಗಳು ಸರ್ಕಾರದ ಮೇಲೆ ನಿರಂತರವಾಗಿ ಒತ್ತಡ ಹೇರುತ್ತ ಬಂದಿದ್ದರು.

ತಜ್ಞರ ಸಮಿತಿಯ ವರದಿ ಆಧಾರ: ತುಳು ಭಾಷೆಗೆ ಅಧಿಕೃತ ಸ್ಥಾನಮಾನ ನೀಡುವ ಸಾಧಕ-ಬಾಧಕಗಳನ್ನು ಕೂಲಂಕಷವಾಗಿ ಪರಿಶೀಲಿಸಲು ಹಿರಿಯ ಶಿಕ್ಷಣ ತಜ್ಞ ಡಾ. ಎಂ. ಮೋಹನ್ ಆಳ್ವ ಅವರ ಅಧ್ಯಕ್ಷತೆಯಲ್ಲಿ ತಜ್ಞರ ಸಮಿತಿಯನ್ನು ರಚಿಸಲಾಗಿತ್ತು. ಈ ಸಮಿತಿಯು ಹೊರ ರಾಜ್ಯಗಳಲ್ಲಿನ ಭಾಷಾ ನೀತಿ ಮಾದರಿಗಳನ್ನು ಅಧ್ಯಯನ ಮಾಡಿ ಸರ್ಕಾರಕ್ಕೆ ವಿಸ್ತೃತ ವರದಿಯನ್ನು ಸಲ್ಲಿಸಿತ್ತು. ಈ ಎಲ್ಲಾ ಬೆಳವಣಿಗೆಗಳ ಹಿನ್ನೆಲೆಯಲ್ಲಿ ಈಗ ತುಳುವರ ಬಹುಕಾಲದ ಕನಸು ನನಸಾಗಿದ್ದು, ಕರಾವಳಿ ಭಾಗದಲ್ಲಿ ಹರ್ಷೋದ್ಗಾರ ವ್ಯಕ್ತವಾಗಿದೆ.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

CONGRESS

ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ

Published

on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.

ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ

ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.

ಯುವ ಕಂಟೆಂಟ್‌ ಕ್ರಿಯೇಟರ್ಸ್‌ ಜೊತೆ ಉಪಾಹಾರ ಹಾಗೂ ಸಂವಾದ

ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ

ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.

Continue Reading

Trending

Copyright © 2025 Deevatige

error: Content is protected !!