Connect with us

arrest

ಮಂಗಳೂರಿನಲ್ಲಿ ಪೊಲೀಸರ ಭರ್ಜರಿ ಕಾರ್ಯಾಚರಣೆ: ತಲೆಮರೆಸಿಕೊಂಡಿದ್ದ ಮೂವರು ವಾರೆಂಟ್ ರೌಡಿ ಅಸಾಮಿಗಳ ಬಂಧನ!

Published

on

ಮಂಗಳೂರು: ಕೋರ್ಟ್‌ಗೆ ಹಾಜರಾಗದೆ ವರ್ಷಗಳಿಂದ ಪೊಲೀಸರ ಕಣ್ಣು ತಪ್ಪಿಸಿ ತಲೆಮರೆಸಿಕೊಂಡಿದ್ದ ಮೂವರು ಪ್ರಮುಖ ವಾರೆಂಟ್ ಆರೋಪಿಗಳನ್ನು ಮಂಗಳೂರು ನಗರದ ಕಂಕನಾಡಿ ಮತ್ತು ಬರ್ಕೆ ಪೊಲೀಸ್ ಠಾಣಾ ಸಿಬ್ಬಂದಿಗಳು ಪ್ರತ್ಯೇಕ ಕಾರ್ಯಾಚರಣೆ ನಡೆಸಿ ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಬಂಧಿತರೆಲ್ಲರೂ ಹಲವು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದು, ನ್ಯಾಯಾಲಯದಿಂದ ವಾರೆಂಟ್ ಹೊರಡಿಸಲ್ಪಟ್ಟಿತ್ತು.

ಕಾರ್ಯಾಚರಣೆ 1: ಬೆಂಗಳೂರಿನಲ್ಲಿ ಅಡಗಿದ್ದ ಕಂಕನಾಡಿ ರೌಡಿ ಶೀಟರ್ ಸೆರೆ

ಕಳೆದ ಎರಡು ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದ ಕಂಕನಾಡಿ ನಗರ ಪೊಲೀಸ್ ಠಾಣಾ ವ್ಯಾಪ್ತಿಯ ರೌಡಿ ಅಸಾಮಿಯೊಬ್ಬನನ್ನು ಪೊಲೀಸರು ಬೆಂಗಳೂರಿನಲ್ಲಿ ಸಿನಿಮೀಯ ಶೈಲಿಯಲ್ಲಿ ಬಂಧಿಸಿದ್ದಾರೆ.

ಬಂಧಿತ ಆರೋಪಿ: ಮಂಗಳೂರಿನ ಪೈಜಲ್ ನಗರ ಶಾಂತಿನಗರದ ಜುಲೈಕ ಹೌಸ್ ನಿವಾಸಿ ರಮ್ಮಿ @ ರಮೀಜ್.

ಹಿನ್ನೆಲೆ: ಈತನ ವಿರುದ್ಧ ಕಂಕನಾಡಿ ನಗರ ಠಾಣೆಯ ಕಳವು ಪ್ರಕರಣಕ್ಕೆ (ಅ.ಕ್ರ : 136/2017) ಸಂಬಂಧಿಸಿದಂತೆ ನ್ಯಾಯಾಲಯವು ದಸ್ತಗಿರಿ ವಾರೆಂಟ್ ಹೊರಡಿಸಿತ್ತು. ಈತ ಕಳೆದ 2 ವರ್ಷಗಳಿಂದ ತಲೆಮರೆಸಿಕೊಂಡಿದ್ದನು.

ಇತರ ಪ್ರಕರಣಗಳು: ಆರೋಪಿ ರಮೀಜ್ ವಿರುದ್ಧ ಮಂಗಳೂರು ಗ್ರಾಮಾಂತರ (ಕೊಲೆ ಯತ್ನ ಪ್ರಕರಣ), ಉಳ್ಳಾಲ (ದಂಗೆ, ಹಲ್ಲೆ ಪ್ರಕರಣ), ಮಂಗಳೂರು ದಕ್ಷಿಣ ಹಾಗೂ ಮಂಗಳೂರು ಪೂರ್ವ ಪೊಲೀಸ್ ಠಾಣೆಗಳು ಸೇರಿದಂತೆ ಒಟ್ಟು 5 ಗಂಭೀರ ಪ್ರಕರಣಗಳು ದಾಖಲಾಗಿವೆ.

ಬಂಧಿಸಿದ ತಂಡ: ಕಂಕನಾಡಿ ನಗರ ಠಾಣೆಯ ವಾರೆಂಟ್ ಸಿಬ್ಬಂದಿಗಳಾದ ಹೆಚ್.ಸಿ. 944 ಬಾಲರಾಜ್, ಪಿಸಿ 3046 ರವಿಕುಮಾರ್ ಮತ್ತು ಪಿಸಿ 2365 ಯುವರಾಜ್ ಅವರ ತಂಡವು ದಿನಾಂಕ 08/06/2026ರಂದು ಬೆಂಗಳೂರಿನ ಕೋನಪ್ಪನ ಅಗ್ರಹಾರದಲ್ಲಿ ಈತನನ್ನು ದಸ್ತಗಿರಿ ಮಾಡಿ ಮಂಗಳೂರು ಕೋರ್ಟ್‌ಗೆ ಹಾಜರುಪಡಿಸಿದೆ.

ಕಾರ್ಯಾಚರಣೆ 2: ಬರ್ಕೆ ಪೊಲೀಸರಿಂದ 5 ವರ್ಷಗಳಿಂದ ತಲೆಮರೆಸಿಕೊಂಡಿದ್ದ ಇಬ್ಬರ ಬಂಧನ

ಇನ್ನೊಂದು ಪ್ರತ್ಯೇಕ ಕಾರ್ಯಾಚರಣೆಯಲ್ಲಿ, ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಜಂಟಿಯಾಗಿ ದಾಳಿ ನಡೆಸಿ, ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ದಸ್ತಗಿರಿಗೆ ಸಿಗದೆ ತಪ್ಪಿಸಿಕೊಂಡಿದ್ದ ಇಬ್ಬರು ವಾರೆಂಟ್ ಆರೋಪಿಗಳನ್ನು ಬಂಧಿಸಿ ಜೈಲಿಗಟ್ಟಿದ್ದಾರೆ.

ಮಾನ್ಯ ನ್ಯಾಯಾಲಯಕ್ಕೆ ಸುಮಾರು 5 ವರ್ಷಗಳಿಂದ ಹಾಜರಾಗದೇ ತಲೆಮರೆಸಿಕೊಂಡಿದ್ದ ಇಬ್ಬರು ಪ್ರಮುಖ ವಾರೆಂಟ್ ಆರೋಪಿಗಳನ್ನು ಬರ್ಕೆ ಪೊಲೀಸ್ ಠಾಣೆಯ ಅಧಿಕಾರಿಗಳು ಮತ್ತು ಸಿಬ್ಬಂದಿಗಳು ಯಶಸ್ವಿಯಾಗಿ ಪತ್ತೆ ಹಚ್ಚಿ ದಸ್ತಗಿರಿ ಮಾಡಿದ್ದಾರೆ. ಬಂಧಿತ ಆರೋಪಿಗಳಲ್ಲಿ ಒಬ್ಬನಾದ ಬಂಟ್ವಾಳದ ನರಿಂಗಾಣ ಗ್ರಾಮದ ತೌಡಗೊಳಿ ಕ್ರಾಸ್ ನಿವಾಸಿ ಅಬ್ದುಲ್ ಖಾದರ್ ತನ್ಸಿಪ್ @ ತಂಜಿ ಎಂಬಾತನ ವಿರುದ್ಧ ಬರ್ಕೆ ಪೊಲೀಸ್ ಠಾಣೆಯಲ್ಲಿ ದಂಗೆ ಹಾಗೂ ಸರ್ಕಾರಿ ನೌಕರರ ಮೇಲೆ ಹಲ್ಲೆ ನಡೆಸಿದ ಆರೋಪದಡಿ ಪ್ರಕರಣ (ಅ.ಕ್ರ. 18/2021, U/s 143, 147, 148, 353, 332, 504 r/w 149 IPC) ದಾಖಲಾಗಿತ್ತು. ಈತ ದೀರ್ಘಕಾಲ ಕೋರ್ಟ್‌ಗೆ ಹಾಜರಾಗದ ಹಿನ್ನೆಲೆಯಲ್ಲಿ ನ್ಯಾಯಾಲಯವು ವಾರೆಂಟ್ ಹೊರಡಿಸಿತ್ತು. ಅಬ್ದುಲ್ ಖಾದರ್ ತನ್ಸಿಪ್ ವಿರುದ್ಧ ಕೊಣಾಜೆ ಹಾಗೂ ಕೇರಳದ ಮಂಜೇಶ್ವರ ಪೊಲೀಸ್ ಠಾಣೆಗಳಲ್ಲೂ ಪ್ರಕರಣಗಳು ದಾಖಲಾಗಿವೆ.

ಮತ್ತೊಂದು ಪ್ರಕರಣದಲ್ಲಿ ಬಂಧಿತನಾದ ಮಂಗಳೂರಿನ ಅಡ್ಯಾರ ಕಣ್ಣೂರ ಕುಂಡಾಲ ಹೌಸ್ ನಿವಾಸಿ ಅಬ್ದುಲ್ ಹಕೀಂ ಎಂಬವರ ಪುತ್ರ ಮೊಹಮ್ಮದ್ ರಾಜೀಕ್ ಎಂಬಾತನ ಮೇಲೆಯೂ ಬರ್ಕೆ ಪೊಲೀಸ್ ಠಾಣೆಯಲ್ಲಿ ಕೊಲೆ ಯತ್ನ, ದಂಗೆ ಹಾಗೂ ಸರ್ಕಾರಿ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಪ್ರಕರಣ (ಅ.ಕ್ರ ನಂ. 17/2021, U/s 143, 147, 148, 353, 332, 506, 307, 149 IPC) ದಾಖಲಾಗಿತ್ತು. ಈತನೂ ಸಹ ಕಳೆದ 5 ವರ್ಷಗಳಿಂದ ನ್ಯಾಯಾಲಯಕ್ಕೆ ಹಾಜರಾಗದೆ ತಲೆಮರೆಸಿಕೊಂಡಿದ್ದರಿಂದ ಈತನ ವಿರುದ್ಧವೂ ದಸ್ತಗಿರಿ ವಾರೆಂಟ್ ಜಾರಿಯಾಗಿತ್ತು. ಮೊಹಮ್ಮದ್ ರಾಜೀಕ್ ವಿರುದ್ಧ ಕಂಕನಾಡಿ, ಬೆಳ್ತಂಗಡಿ, ಪುತ್ತೂರು ಹಾಗೂ ಕದ್ರಿ ಪೊಲೀಸ್ ಠಾಣೆಗಳಲ್ಲೂ ಹಲವು ಪ್ರಕರಣಗಳು ದಾಖಲಾಗಿರುವುದು ಬೆಳಕಿಗೆ ಬಂದಿದೆ. ಸದ್ಯ ಬರ್ಕೆ ಪೊಲೀಸರಿಂದ ಬಂಧಿಸಲ್ಪಟ್ಟ ಇಬ್ಬರೂ ಆರೋಪಿಗಳನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಅವರಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಬರ್ಕೆ ಠಾಣಾ ಅಧಿಕಾರಿ ಹಾಗೂ ಸಿಬ್ಬಂದಿಗಳ ತಂಡವು ಈ ಇಬ್ಬರೂ ಆರೋಪಿಗಳನ್ನು ಪತ್ತೆ ಹಚ್ಚಿ ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಇವರಿಬ್ಬರಿಗೂ ನ್ಯಾಯಾಂಗ ಬಂಧನ ವಿಧಿಸಿದೆ.

ಮಂಗಳೂರು ಕಮಿಷನರೇಟ್ ವ್ಯಾಪ್ತಿಯಲ್ಲಿ ವಾರೆಂಟ್ ಆರೋಪಿಗಳ ಪತ್ತೆಗೆ ಜಾಲ ಬೀಸಿದ್ದು, ತಲೆಮರೆಸಿಕೊಂಡಿರುವ ಇಂತಹ ಹಳೇ ಆರೋಪಿಗಳನ್ನು ಪತ್ತೆ ಹಚ್ಚುವ ಕಾರ್ಯ ಮುಂದುವರಿದಿದೆ. ನ್ಯಾಯಾಲಯದ ಆದೇಶವನ್ನು ಉಲ್ಲಂಘಿಸಿ ತಪ್ಪಿಸಿಕೊಂಡಿದ್ದ ರೌಡಿ ಅಸಾಮಿಗಳನ್ನು ಹೆಡೆಮುರಿ ಕಟ್ಟಿದ ಪೊಲೀಸರ ಈ ಯಶಸ್ವಿ ಕಾರ್ಯಾಚರಣೆಗೆ ಸಾರ್ವಜನಿಕ ವಲಯದಲ್ಲಿ ವ್ಯಾಪಕ ಶ್ಲಾಘನೆ ವ್ಯಕ್ತವಾಗಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!