Connect with us

accident

ಪೆರುವಾಯಿ ಪೇರಡ್ಕ ಸೇತುವೆಯಿಂದ ತೋಡಿಗೆ ಬಿದ್ದ ಆಲ್ಟೋ ಕಾರು: ಐವರು ಪ್ರಯಾಣಿಕರು ಪವಾಡಸದೃಶ ಪಾರು!

Published

on

ವಿಟ್ಲ: ನಿಯಂತ್ರಣ ತಪ್ಪಿದ ಕಾರೊಂದು ಸೇತುವೆಯಿಂದ ಕೆಳಗಿನ ತೋಡಿಗೆ ಬಿದ್ದರೂ, ಅದೃಷ್ಟವಶಾತ್ ಕಾರಿನಲ್ಲಿದ್ದ ಐವರು ಪ್ರಯಾಣಿಕರು ಪವಾಡಸದೃಶ ರೀತಿಯಲ್ಲಿ ಪ್ರಾಣಾಪಾಯದಿಂದ ಪಾರಾದ ಘಟನೆ ಪೆರುವಾಯಿ ಗ್ರಾಮದ ಪೇರಡ್ಕ ಎಂಬಲ್ಲಿ ಭಾನುವಾರ ರಾತ್ರಿ ಸಂಭವಿಸಿದೆ.

ಘಟನೆಯ ವಿವರ: ಪೆರುವಾಯಿ ಕಡೆಯಿಂದ ಬೆರಿಪದವು ಕಡೆಗೆ ಐವರು ಪ್ರಯಾಣಿಕರೊಂದಿಗೆ ತೆರಳುತ್ತಿದ್ದ ಆಲ್ಟೋ ಕಾರು ಪೇರಡ್ಕ ಸೇತುವೆ ತಲುಪುತ್ತಿದ್ದಂತೆ ಚಾಲಕನ ನಿಯಂತ್ರಣ ತಪ್ಪಿ ನೇರ ತೋಡಿಗೆ ಉರುಳಿ ಬಿದ್ದಿದೆ. ಅಪಘಾತದ ತೀವ್ರತೆಗೆ ಆಲ್ಟೋ ಕಾರು ಸಂಪೂರ್ಣ ನುಜ್ಜುಗುಜ್ಜಾಗಿದೆ.

ರಕ್ಷಿಸಿದ ಮಳೆ ಅಭಾವ! ಸಾಮಾನ್ಯವಾಗಿ ಮುಂಗಾರು ಮಳೆಗಾಲದಲ್ಲಿ ಈ ತೋಡಿನಲ್ಲಿ ನೀರು ತುಂಬಿ ಭೋರ್ಗರೆದು ಹರಿಯುತ್ತಿರುತ್ತದೆ. ಆದರೆ ಈ ಬಾರಿ ಸಕಾಲದಲ್ಲಿ ಸರಿಯಾದ ಮಳೆ ಬಾರದ ಕಾರಣ ಹೊಳೆಯಲ್ಲಿ ನೀರಿನ ಪ್ರಮಾಣ ತೀರಾ ಕಡಿಮೆಯಿತ್ತು. ಇದೇ ಕಾರಣಕ್ಕೆ ಕಾರು ತಲೆಕೆಳಗಾಗಿ ಬಿದ್ದರೂ ನೀರಿನಲ್ಲಿ ಮುಳುಗದೆ ಪ್ರಯಾಣಿಕರು ಪ್ರಾಣಾಪಾಯದಿಂದ ಪಾರಾಗಲು ಸಾಧ್ಯವಾಗಿದೆ ಎಂದು ಸ್ಥಳೀಯರು ತಿಳಿಸಿದ್ದಾರೆ.

ತಡೆಗೋಡೆ ಇಲ್ಲದ ಸೇತುವೆ: ನಿರಂತರ ಅಪಘಾತಗಳ ತಾಣ!

ಈ ಸೇತುವೆಗೆ ಯಾವುದೇ ಸುರಕ್ಷಿತ ತಡೆಗೋಡೆ (ಬ್ಯಾರಿಕೇಡ್) ಇಲ್ಲದಿರುವುದೇ ಸರಣಿ ಅಪಘಾತಗಳಿಗೆ ಮುಖ್ಯ ಕಾರಣವಾಗಿದೆ. ಕೇವಲ ಕೆಲವು ದಿನಗಳ ಹಿಂದಷ್ಟೇ (ಮೇ 31 ರಂದು) ಇದೇ ಸೇತುವೆಯಿಂದ ಕೋಳಿ ಸಾಗಾಟ ಮಾಡುತ್ತಿದ್ದ ಪಿಕ್‌ಅಪ್‌ ವಾಹನವೊಂದು ನಿಯಂತ್ರಣ ತಪ್ಪಿ ಹೊಳೆಗೆ ಬಿದ್ದು ಭೀಕರ ಅಪಘಾತ ನಡೆದಿತ್ತು. ಆದರೂ ಸಂಬಂಧಪಟ್ಟ ಇಲಾಖೆಯ ಅಧಿಕಾರಿಗಳು ಎಚ್ಚೆತ್ತುಕೊಂಡಿಲ್ಲ.

ಸಾರ್ವಜನಿಕರ ಆಕ್ರೋಶ: “ಕಳೆದ ಹಲವಾರು ವರ್ಷಗಳಿಂದ ಈ ಅಪಾಯಕಾರಿ ಸೇತುವೆಗೆ ಬಲವಾದ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಹಾಗೂ ಸ್ಥಳೀಯರು ನಿರಂತರವಾಗಿ ಒತ್ತಾಯಿಸುತ್ತಾ ಬರುತ್ತಿದ್ದಾರೆ. ಆದರೆ ಲೋಕೋಪಯೋಗಿ ಇಲಾಖೆಯಾಗಲಿ ಅಥವಾ ಸಂಬಂಧಪಟ್ಟ ಅಧಿಕಾರಿಗಳಾಗಲಿ ಯಾವುದೇ ಕ್ರಮ ಜರಗಿಸುತ್ತಿಲ್ಲ. ಅಧಿಕಾರಿಗಳ ಈ ಉದಾಸೀನತೆಯೇ ಸರಣಿ ಅಪಘಾತಗಳಿಗೆ ಪ್ರೇರಣೆ ನೀಡುವಂತಿದೆ” ಎಂದು ಸಾರ್ವಜನಿಕರು ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಇನ್ನಾದರೂ ಸಂಬಂಧಪಟ್ಟ ಇಲಾಖೆ ಹಾಗೂ ಜನಪ್ರತಿನಿಧಿಗಳು ಎಚ್ಚೆತ್ತುಕೊಂಡು, ಮುಂದಿನ ದಿನಗಳಲ್ಲಿ ಸಂಭವಿಸಬಹುದಾದ ದೊಡ್ಡ ಮಟ್ಟದ ಜೀವಹಾನಿಯನ್ನು ತಪ್ಪಿಸಲು ತಕ್ಷಣವೇ ಪೇರಡ್ಕ ಸೇತುವೆಗೆ ತಡೆಗೋಡೆ ನಿರ್ಮಿಸಬೇಕೆಂದು ಸಾರ್ವಜನಿಕರು ಗಂಭೀರವಾಗಿ ಆಗ್ರಹಿಸಿದ್ದಾರೆ

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ವಿಟ್ಲ: ಸರ್ಕಾರಿ ಬಸ್ ನಿರ್ವಾಹಕನಿಗೆ ಇನ್ನೋವಾ ಡಿಕ್ಕಿ – ಗಂಭೀರ ಗಾಯ

Published

on

ವಿಟ್ಲ: ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್ಸಿನ ನಿರ್ವಾಹಕನಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಲಪದವು ಜಂಕ್ಷನ್‌ನಲ್ಲಿ ನಡೆದಿದೆ.

ಮಂಗಳೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ KA 19 F 3176 ಸಂಖ್ಯೆಯ ಸರ್ಕಾರಿ ಬಸ್ ಮಂಗಲಪದವು ಜಂಕ್ಷನ್‌ನಲ್ಲಿ ನಿಲ್ಲಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.

ಬಸ್ ನಿರ್ವಾಹಕ ಕರೀಮುಲ್ಲಾ (41) ಅವರು ರಸ್ತೆಯ ಇನ್ನೊಂದು ಬದಿಯ ಅಂಗಡಿಗೆ ಬಾಳೆಹಣ್ಣು ತರಲು ಹೋಗಿದ್ದರು. ಮರಳಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ KL 65 K 6381 ಸಂಖ್ಯೆಯ ಇನ್ನೋವಾ ಕಾರು ನಿರ್ವಾಹಕನಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.

ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಕರೀಮುಲ್ಲಾ ಅವರಿಗೆ ತಲೆಗೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಅವರನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಅಪಘಾತ ನಡೆದ ತಕ್ಷಣ ಜನ ಜಮಾಯಿಸುತ್ತಿದ್ದಂತೆ ಇನ್ನೋವಾ ಚಾಲಕ ಕಾರು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾದ ಕಾರು ಚಾಲಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.

Continue Reading

accident

ಪ್ರವಾಸಕ್ಕೆಂದು ಹೊರಟ ಸ್ನೇಹಿತರ ಗುಂಪು ಶವವಾಗಿ ವಾಪಸ್..ಉತ್ತರಾಖಂಡ ಹೆಲಿಕಾಪ್ಟರ್ ಪತನದಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ದುರಂತ ಅಂತ್ಯ

Published

on

ಬೆಂಗಳೂರು: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರಿನ ಸಿಸಿಬಿ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಕನ್ನಡಿಗರು ಹಾಗೂ ಪೈಲಟ್ ಸೇರಿ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರಿನಿಂದ ಪ್ರವಾಸ ಕೈಗೊಂಡಿದ್ದ ಸ್ನೇಹಿತರ ಗುಂಪು ಈ ದುರಂತಕ್ಕೆ ಬಲಿಯಾಗಿದೆ. ಮೃತರನ್ನು ಸಿಸಿಬಿ ಇನ್‌ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್, ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.

ಘಟನೆಯ ವಿವರ:
ಬೆಂಗಳೂರಿನಿಂದ ಧಾರ್ಮಿಕ ಪ್ರವಾಸಕ್ಕೆ ತೆರಳಿದ್ದ ಈ ಸ್ನೇಹಿತರ ತಂಡ ಕೇದಾರನಾಥ ಮತ್ತು ಬದರಿನಾಥ ದರ್ಶನ ಪೂರೈಸಿ, ಬದರಿನಾಥದಿಂದ ಡೆಹ್ರಾಡೂನ್‌ನ ಸಹಸ್ರಧಾರಕ್ಕೆ ಟ್ರಾನ್ಸ್ ಭಾರತ್ ಏವಿಯೇಷನ್‌ಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿತ್ತು. ಮಧ್ಯಾಹ್ನ 1:14 ಕ್ಕೆ ಬದರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಏಕಾಏಕಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಅಲ್ಲದೆ ಹೆಲಿಕಾಪ್ಟರ್‌ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡು, ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ಅಪಘಾತದ ಕುರಿತು ಮಾಹಿತಿ ಪಡೆದ ಉತ್ತರಾಖಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ದುರಂತ ಸಾವು ಅವರ ಕುಟುಂಬಸ್ಥರು ಹಾಗೂ ಆಪ್ತರ ವಲಯದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.

ತನಿಖೆಗೆ ಆದೇಶ – ಹಾರಾಟ ಸ್ಥಗಿತ:
ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ ಎಲ್ಲಾ ಹೆಲಿಕಾಪ್ಟರ್‌ಗಳ ಹಾರಾಟವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ

Continue Reading

accident

ಕುಂದಾಪುರ: ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಶಾಲಾ ಬಾಲಕಿಯರು ಕೆರೆಗೆ ಬಿದ್ದು ದುರಂತ ಸಾವು

Published

on

ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು 13 ವರ್ಷದ ಶಾಲಾ ಬಾಲಕಿಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸಮೀಪದ ಕೊಪ್ಪರಿಗೆ ಗುಡ್ಡೆ ಕಡುಬಿನ ಕೆರೆಯಲ್ಲಿ ಭಾನುವಾರ ಸಂಭವಿಸಿದೆ.

ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಮುದ್ದಿನಕೊಪ್ಪ ಮೂಲದ, ಪ್ರಸ್ತುತ ಮುಳ್ಳಿಕಟ್ಟೆ ಟೆಂಟ್ ಹೌಸ್‌ನಲ್ಲಿ ವಾಸವಾಗಿದ್ದ ಚಂದ್ರು ಬಸವರಾಜ ವೇಷಗಾರ ಎಂಬುವರ ಪುತ್ರಿ ಸುನೀತಾ (13) ಹಾಗೂ ಅವರ ಸಂಬಂಧಿ ದಿ. ಮಂಜುನಾಥ್ ಅವರ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯರಿಬ್ಬರೂ ಹೊಸಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಘಟನೆಯ ವಿವರ: ಭಾನುವಾರ ಸಂಜೆ ಟೆಂಟ್ ಹೌಸ್ ನಿವಾಸಿಗಳಾದ 5 ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ತೆರಳಿದ್ದರು. ಕೆರೆಯ ದಡದಲ್ಲಿ ಸುನೀತಾ ಹಾಗೂ ವೈಶಾಲಿ ಬಟ್ಟೆ ಒಗೆಯುತ್ತಿದ್ದಾಗ, ಸುನೀತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಿಸಲು ಯತ್ನಿಸಿದ ವೈಶಾಲಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಜೊತೆಯಲ್ಲಿದ್ದ ಇತರ ಮಕ್ಕಳು ಕೂಡಲೇ ವಿಷಯ ತಿಳಿಸಿದ್ದು, ಪಾಲಕರು ಹಾಗೂ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಸಂಜೆ 5.15ರ ಅಂದಾಜಿಗೆ ಇಬ್ಬರೂ ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.

ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಶವ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತ ಸುನೀತಾಳ ತಂದೆ ನೀಡಿದ ದೂರಿನನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!