Connect with us

arrest

ವಿಶೇಷ ವರದಿ: ಉಡುಪಿಯಲ್ಲಿ ಹೆಣ್ಣು ಮಗುವಿನ ಅಕ್ರಮ ಮಾರಾಟ ಜಾಲ ಪತ್ತೆ; ಖ್ಯಾತ ವೈದ್ಯ ಸೇರಿ ನಾಲ್ವರ ಬಂಧನ

Published

on

ಉಡುಪಿ: ಮಕ್ಕಳಿಲ್ಲದ ದಂಪತಿಗಳ ಅಸಹಾಯಕತೆಯನ್ನು ಬಂಡವಾಳ ಮಾಡಿಕೊಂಡು, ಕಾನೂನುಬಾಹಿರವಾಗಿ ನವಜಾತ ಶಿಶುಗಳನ್ನು ಮಾರಾಟ ಮಾಡುವ ಮತ್ತು ನಕಲಿ ದಾಖಲೆಗಳನ್ನು ಸೃಷ್ಟಿಸುವ ಭೀಕರ ಜಾಲವೊಂದನ್ನು ಉಡುಪಿ ಮಹಿಳಾ ಪೊಲೀಸರು ಪತ್ತೆಹಚ್ಚಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಕಾಮತ್ ನರ್ಸಿಂಗ್ ಹೋಮ್‌ನ ಪ್ರಸಿದ್ಧ ವೈದ್ಯ ಡಾ. ಕೆ. ಸುರೇಂದ್ರ ಕಾಮತ್ (76) ಸೇರಿದಂತೆ ನಾಲ್ವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.

ಕೇವಲ ಒಂದು ತಿಂಗಳ ಹೆಣ್ಣು ಮಗುವನ್ನು ಅಕ್ರಮವಾಗಿ ಮಾರಾಟ ಮಾಡಿದ ಹಾಗೂ ನಕಲಿ ದಾಖಲೆಗಳನ್ನು ಸೃಷ್ಟಿಸಿದ ಆಘಾತಕಾರಿ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಮಹಿಳಾ ಪೊಲೀಸ್ ಠಾಣೆಯ ಪೊಲೀಸರು ತನಿಖೆ ನಡೆಸಿ, ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯರು ಸೇರಿದಂತೆ ನಾಲ್ವರು ಆರೋಪಿಗಳನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ.

ಬಂಧಿತ ಆರೋಪಿಗಳ ವಿವರ ಮತ್ತು ವಿಳಾಸ:

ಡಾ. ಕೆ. ಸುರೇಂದ್ರ ಕಾಮತ್ (76) – ಉಡುಪಿ ಕಾಮತ್ ನರ್ಸಿಂಗ್ ಹೋಮ್‌ನ ವೈದ್ಯ.

ಎಸ್‌‌. ಪ್ರಕಾಶ್ (50) – ಸಂತೆಕಟ್ಟೆ ನೇಜಾರು ನಿವಾಸಿ (ಮಗು ಪಡೆದ ವ್ಯಕ್ತಿ).

ಸಂಪತ್ (22) – ಕಾರ್ಕಳದ ಸೂಡ ನಿವಾಸಿ (ಮಗು ಹಸ್ತಾಂತರಿಸಿದ ಆರೋಪಿ).

ಸುಪ್ರೀತಿ (22) – ನಂದಳಿಕೆ ನಿವಾಸಿ (ಮಗು ಹಸ್ತಾಂತರಿಸಿದ ಆರೋಪಿ).

    ಅಧಿಕಾರಿಗಳ ದಾಳಿ ಮತ್ತು ಅಕ್ರಮ ಪತ್ತೆ:

    ಜೂನ್ 19ರಂದು ಬ್ರಹ್ಮಾವರ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ವಲಯ ಮೇಲ್ವಿಚಾರಕರು ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಪ್ರಮುಖ ಮಾಹಿತಿಯೊಂದನ್ನು ನೀಡಿದ್ದರು. ಸಂತೆಕಟ್ಟೆ ನೇಜಾರಿನ ದಂಪತಿಯಾದ ಪ್ರಕಾಶ್ ಹಾಗೂ ಪೂರ್ಣಿಮಾ ಅವರು ಸುಮಾರು ಒಂದು ತಿಂಗಳ ಹೆಣ್ಣು ಮಗುವನ್ನು ಯಾವುದೇ ಕಾನೂನುಬದ್ಧ ದತ್ತು ಪ್ರಕ್ರಿಯೆ ಇಲ್ಲದೆ ಅಕ್ರಮವಾಗಿ ಸಾಕುತ್ತಿದ್ದಾರೆ ಎನ್ನುವುದು ಆ ಮಾಹಿತಿಯಾಗಿತ್ತು.

    ಇದನ್ನು ಆಧರಿಸಿ ಮಕ್ಕಳ ರಕ್ಷಣಾ ಘಟಕದ ಅಧಿಕಾರಿಗಳು ಹಾಗೂ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳ ಕಚೇರಿಯ ಸಿಬ್ಬಂದಿ ಜಂಟಿಯಾಗಿ ನೇಜಾರಿನಲ್ಲಿರುವ ಪ್ರಕಾಶ್ ಅವರ ಮನೆಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ವೇಳೆ ಮನೆಯಲ್ಲಿ ಕೇವಲ ಒಂದು ತಿಂಗಳ ಹೆಣ್ಣು ಮಗು ಹಾಗೂ ಪೂರ್ಣಿಮಾ ಅವರ ಅಕ್ಕ ಲಕ್ಷ್ಮಿ ಅವರು ಇದ್ದರು. ಅಧಿಕಾರಿಗಳು ಮಗುವಿನ ಕುರಿತು ವಿಚಾರಿಸಿದಾಗ ಅವರು ಅನುಮಾನಾಸ್ಪದ ಮಾಹಿತಿ ನೀಡಿದ್ದರಿಂದ, ಅಧಿಕಾರಿಗಳಿಗೆ ಸಂಶಯ ಬಂದು ಮಹಿಳಾ ಪೊಲೀಸ್ ಠಾಣೆಗೆ ದೂರು ನೀಡಿ ಹೆಚ್ಚಿನ ತನಿಖೆ ಕೈಗೊಳ್ಳಲಾಯಿತು.

    ಆಸ್ಪತ್ರೆಯ ಚಿಕಿತ್ಸೆ ವೇಳೆ ಮಗುವಿನ ಡೀಲ್: ಬಯಲಾಯ್ತು ವೈದ್ಯರ ಸಂಚು!

    ಪೊಲೀಸ್ ತನಿಖೆಯ ವೇಳೆ ಅತ್ಯಂತ ಆಘಾತಕಾರಿ ಸತ್ಯಗಳು ಬೆಳಕಿಗೆ ಬಂದಿವೆ. ಪ್ರಕಾಶ್ ಮತ್ತು ಪೂರ್ಣಿಮಾ ದಂಪತಿಗೆ ಮದುವೆಯಾಗಿ 11 ವರ್ಷಗಳಾಗಿದ್ದರೂ ಮಕ್ಕಳಾಗಿರಲಿಲ್ಲ. ಈ ಕಾರಣಕ್ಕಾಗಿ ಅವರು ಉಡುಪಿಯ ಕಾಮತ್ ನರ್ಸಿಂಗ್ ಹೋಮ್‌ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಈ ಚಿಕಿತ್ಸೆಯ ಅವಧಿಯಲ್ಲಿ ಆಸ್ಪತ್ರೆಯಲ್ಲಿ ಹೆಣ್ಣು ಮಗುವೊಂದು ಇರುವ ಮಾಹಿತಿ ದಂಪತಿಗೆ ದೊರೆತಿತ್ತು. ತಕ್ಷಣ ಅವರು ವೈದ್ಯರಾದ ಡಾ. ಸುರೇಂದ್ರ ಕಾಮತ್ ಅವರನ್ನು ಸಂಪರ್ಕಿಸಿ ತಮಗೆ ಮಗು ನೀಡುವಂತೆ ಕೋರಿದ್ದರು.

    ಇದಕ್ಕೆ ಒಪ್ಪಿದ ವೈದ್ಯ ಡಾ. ಸುರೇಂದ್ರ ಕಾಮತ್ ಅವರು ಕಾನೂನುಬಾಹಿರವಾಗಿ ಹೆಣ್ಣು ಮಗುವನ್ನು ದಂಪತಿಗೆ ನೀಡಿದ್ದಲ್ಲದೆ, ಬಳಿಕ ಮಗುವಿನ ಜನನ ಪ್ರಮಾಣಪತ್ರ ಸೇರಿದಂತೆ ನಕಲಿ ದಾಖಲೆಗಳನ್ನು ಆಸ್ಪತ್ರೆಯಲ್ಲೇ ಸಿದ್ಧಪಡಿಸಿಕೊಟ್ಟಿದ್ದರು. ಈ ನಕಲಿ ವೈದ್ಯಕೀಯ ದಾಖಲೆಗಳ ಆಧಾರದ ಮೇಲೆ ಆರೋಪಿಗಳು ಉಡುಪಿ ನಗರಸಭೆಯಿಂದ ಅಧಿಕೃತ ಜನನ ಪ್ರಮಾಣಪತ್ರವನ್ನೂ ಪಡೆದುಕೊಂಡಿದ್ದರು. ಸದ್ಯದ ವಿಚಾರಣೆಯ ವೇಳೆ ತಮಗೆ ಮಗುವಿನ ಜೈವಿಕ (ಹೆತ್ತ) ಪೋಷಕರು ಯಾರು ಎಂಬ ಯಾವುದೇ ಮಾಹಿತಿ ಇಲ್ಲ ಎಂದು ಸಾಕು ದಂಪತಿ ಪೊಲೀಸರ ಮುಂದೆ ಒಪ್ಪಿಕೊಂಡಿದ್ದಾರೆ.

    ಅಕ್ರಮ ಲಾಭಕ್ಕಾಗಿ ‘ಮಗು ಕಳ್ಳಸಾಗಣೆ’ (Human Trafficking):

    ಆರೋಪಿಗಳು ಕೇವಲ ಅಕ್ರಮವಾಗಿ ಹಣದ ಲಾಭ ಪಡೆಯುವ ಉದ್ದೇಶದಿಂದ ಒಳಸಂಚು ರೂಪಿಸಿ, ಮಗುವಿನ ಜನನ ಮತ್ತು ಹೆತ್ತ ಪೋಷಕರಿಗೆ ಸಂಬಂಧಿಸಿದ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಹೆಣ್ಣು ಮಗುವನ್ನು ಕಳ್ಳಸಾಗಣೆ (ಟ್ರಾಫಿಕಿಂಗ್) ಮೂಲಕ ಮಾರಾಟ ಮಾಡಿದ್ದಾರೆ ಎಂದು ದೂರಿನಲ್ಲಿ ಗಂಭೀರವಾಗಿ ಆರೋಪಿಸಲಾಗಿದೆ.

    ಪೊಲೀಸ್ ಕಾರ್ಯಾಚರಣೆ:

    ಈ ಸಂಬಂಧ ಉಡುಪಿ ಮಹಿಳಾ ಪೊಲೀಸ್ ಠಾಣೆಯಲ್ಲಿ ಅಧಿಕೃತ ಪ್ರಕರಣ ದಾಖಲಾಗಿದ್ದು, ಪೊಲೀಸರು ಕ್ಷಿಪ್ರ ಕಾರ್ಯಾಚರಣೆ ನಡೆಸಿ ನಾಲ್ವರನ್ನು ಬಂಧಿಸಿದ್ದಾರೆ. ಮೊದಲಿಗೆ ಅಕ್ರಮ ಜಾಲದ ಸೂತ್ರಧಾರ ವೈದ್ಯ ಡಾ. ಸುರೇಂದ್ರ ಕಾಮತ್ ಹಾಗೂ ಮಗು ಪಡೆದ ಪ್ರಕಾಶ್ ಅವರನ್ನು ಬಂಧಿಸಲಾಗಿದ್ದು, ತದನಂತರ ಮಗುವನ್ನು ಅಕ್ರಮವಾಗಿ ಸಾಗಿಸಿ ಹಸ್ತಾಂತರಿಸಿದ ಆರೋಪದ ಮೇಲೆ ಕಾರ್ಕಳ ಸೂಡದ ಸಂಪತ್ ಮತ್ತು ನಂದಳಿಕೆಯ ಸುಪ್ರೀತಿಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ. ಪೊಲೀಸರು ಈ ಜಾಲದ ಮೂಲವನ್ನು ಹುಡುಕಲು ತನಿಖೆಯನ್ನು ತೀವ್ರಗೊಳಿಸಿದ್ದಾರೆ




    ads (2)
    ads (3)
    ads (4)
    ads (5)
    ads (6)
    ads (1)
    ads (8)
    ads (7)
    ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
    Advertisement

    arrest

    6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

    Published

    on

    ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

    ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

    ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

    ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

    Continue Reading

    arrest

    ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

    Published

    on

    ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

    ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

    ಘಟನೆ ವಿವರ:

    ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

    ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

    ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

    ದೂರು ಮತ್ತು ಬಂಧನ:

    ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

    ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

    ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

    40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

    Continue Reading

    arrest

    ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

    Published

    on

    ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

    ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

    ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

    ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

    Continue Reading

    Trending

    Copyright © 2025 Deevatige

    error: Content is protected !!