arrest
ಅಪಘಾತಕ್ಕೀಡಾದ ಲಾರಿಯಿಂದ ನಡುರಾತ್ರಿ ಬ್ಯಾಟರಿ ಕಳ್ಳತನ: ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕುಖ್ಯಾತ ಚೋರ, ಇನ್ನೊಬ್ಬನೂ ಪೊಲೀಸ್ ವಶಕ್ಕೆ!
ವಿಟ್ಲ: ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಮಯಪ್ರಜ್ಞೆಯಿಂದಾಗಿ ವಾಹನಗಳ ಬ್ಯಾಟರಿ ಕಳ್ಳತನ ಮಾಡುತ್ತಿದ್ದ ಇಬ್ಬರು ಕುಖ್ಯಾತ ಕಳ್ಳರು ಪೊಲೀಸರ ಬಲೆಗೆ ಬಿದ್ದಿದ್ದಾರೆ.
ಘಟನೆಯ ಹಿನ್ನೆಲೆ:
ವಿಟ್ಲ ಠಾಣಾ ವ್ಯಾಪ್ತಿಯ ಉಕ್ಕುಡ ದರ್ಬೆಯಲ್ಲಿ ನಿನ್ನೆ ರಾತ್ರಿ ಟಿಪ್ಪರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಮರಕ್ಕೆ ಢಿಕ್ಕಿ ಹೊಡೆದಿತ್ತು. ಅಪಘಾತದ ತೀವ್ರತೆಗೆ ಲಾರಿ ಭಾರಿ ಪ್ರಮಾಣದಲ್ಲಿ ಜಖಂಗೊಂಡಿದ್ದು, ಚಾಲಕ ಮತ್ತು ಕ್ಲೀನರ್ ಗಂಭೀರವಾಗಿ ಗಾಯಗೊಂಡಿದ್ದರು.
ರೆಡ್ ಹ್ಯಾಂಡಾಗಿ ಸಿಕ್ಕಿಬಿದ್ದ ಕಳ್ಳ:
ನಡುರಾತ್ರಿ ಅಪಘಾತ ಸಂಭವಿಸಿದ ಜಾಗದಲ್ಲಿ ಲಾರಿಯನ್ನು ಗಮನಿಸಿದ ಇಬ್ಬರು ಸ್ಥಳೀಯರು ಅದರಿಂದ ಬ್ಯಾಟರಿ ಕಳ್ಳತನ ಮಾಡಲು ಯತ್ನಿಸುತ್ತಿದ್ದರು. ಇದೇ ವೇಳೆ ಅದೇ ರಸ್ತೆಯಲ್ಲಿ ಕಾರಿನಲ್ಲಿ ಹೋಗುತ್ತಿದ್ದ ಸಾರ್ವಜನಿಕರಿಗೆ ಇವರ ನಡೆ ಕಂಡು ಅನುಮಾನ ಬಂದಿದ್ದು, ತಕ್ಷಣ ಕಾರು ನಿಲ್ಲಿಸಿ ಪರಿಶೀಲಿಸಿದ್ದಾರೆ. ಬ್ಯಾಟರಿ ಕದಿಯುತ್ತಿದ್ದ ಇಬ್ಬರಲ್ಲಿ ಓರ್ವನನ್ನು ಸ್ಥಳೀಯರು ರೆಡ್ ಹ್ಯಾಂಡಾಗಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದು, ಇನ್ನೊಬ್ಬಾತ ಸಿಕ್ಕಿಬೀಳುವ ಭಯದಲ್ಲಿ ಸ್ಥಳದಿಂದ ಪರಾರಿಯಾಗಿದ್ದನು.
ಆರೋಪಿಗಳ ವಿವರ:
ಹರೀಶ್ (35): ಸಾರ್ವಜನಿಕರ ಕೈಗೆ ಸಿಕ್ಕಿಬಿದ್ದ ಆರೋಪಿ. ಮೂಲತಃ ಕೊಡಗು ಜಿಲ್ಲೆಯ ಪೊನ್ನಂಪೇಟೆ ನಿವಾಸಿಯಾಗಿದ್ದು, ಸದ್ಯ ವಿಟ್ಲ ಹೊರವಲಯದ ಉಕ್ಕುಡ ದರ್ಬೆಯಲ್ಲಿ ಕುಶನ್ ವರ್ಕ್ ಮಾಡಿಕೊಂಡಿದ್ದಾನೆ.
ರಾಜೇಶ್ ಬೆಳ್ಚಡ (30): ಸ್ಥಳದಿಂದ ಪರಾರಿಯಾಗಿದ್ದ ಆರೋಪಿ. ಅಳಿಕೆ ನಿವಾಸಿಯಾದ ಈತ ಈ ಹಿಂದೆ ಆಟೋ ಚಾಲಕನಾಗಿದ್ದು, ಪ್ರಸ್ತುತ ಟೂರಿಸ್ಟ್ ಜೀತೋ ವಾಹನ ಮಾಲೀಕ ಕಂ ಚಾಲಕನಾಗಿದ್ದಾನೆ. ಈತನ ಮೇಲೆ ಈ ಹಿಂದೆ ಯುವತಿಯೊಬ್ಬಳಿಗೆ ಕಿರುಕುಳ ಹಾಗೂ ದೌರ್ಜನ್ಯ ಎಸಗಿದ ಆರೋಪವೂ ಇದೆ ಎಂದು ಸ್ಥಳೀಯರು ತಿಳಿಸಿದ್ದಾರೆ.
ಇಬ್ಬರೂ ಈಗ ಪೊಲೀಸ್ ವಶಕ್ಕೆ:
ರಾತ್ರಿ ವೇಳೆ ಸಿಕ್ಕಿಬಿದ್ದ ಹರೀಶನನ್ನು ಸಾರ್ವಜನಿಕರು ತಕ್ಷಣ ವಿಟ್ಲ ಪೊಲೀಸರಿಗೆ ಒಪ್ಪಿಸಿದ್ದರು. ಪೊಲೀಸರು ಆತನನ್ನು ತೀವ್ರ ವಿಚಾರಣೆಗೊಳಪಡಿಸಿದ ಬೆನ್ನಲ್ಲೇ, ಪರಾರಿಯಾಗಿದ್ದ ಮತ್ತೊಬ್ಬ ಆರೋಪಿ ಅಳಿಕೆ ರಾಜೇಶ್ ಬೆಳ್ಚಡನನ್ನು ಪತ್ತೆ ಹಚ್ಚಿ ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ.
ಹಲವು ಪ್ರಕರಣಗಳು ಬಯಲಾಗುವ ಸಾಧ್ಯತೆ:
ವಿಟ್ಲ ಠಾಣಾ ವ್ಯಾಪ್ತಿಯಲ್ಲಿ ಕಳೆದ ಕೆಲವು ಸಮಯದಿಂದ ರಾತ್ರಿ ವೇಳೆ ನಿಲ್ಲಿಸುತ್ತಿದ್ದ ವಾಹನಗಳ ಬ್ಯಾಟರಿ ಕಳ್ಳತನ ಪ್ರಕರಣಗಳು ನಿರಂತರವಾಗಿ ನಡೆಯುತ್ತಿದ್ದು, ಇದು ಪೊಲೀಸರಿಗೆ ತಲೆನೋವಾಗಿ ಪರಿಣಮಿಸಿತ್ತು. ಇತ್ತೀಚೆಗಷ್ಟೇ ಕೇರಳ ಮೂಲದ ಇಬ್ಬರು ಬ್ಯಾಟರಿ ಕಳ್ಳರನ್ನು ಬಂಧಿಸಿ ಹಲವು ಬ್ಯಾಟರಿಗಳನ್ನು ವಶಪಡಿಸಿಕೊಳ್ಳಲಾಗಿತ್ತು. ಆದರೂ ಇನ್ನೂ ಪತ್ತೆಯಾಗದ ಹತ್ತಕ್ಕೂ ಹೆಚ್ಚು ಬ್ಯಾಟರಿ ಕಳ್ಳತನ ಪ್ರಕರಣಗಳ ಬೆನ್ನು ಬಿದ್ದಿದ್ದ ಪೊಲೀಸರಿಗೆ ಇದೀಗ ಈ ಇಬ್ಬರು ಕುಖ್ಯಾತ ಕಳ್ಳರು ಸಿಕ್ಕಿಬಿದ್ದಿರುವುದು ದೊಡ್ಡ ಯಶಸ್ಸು ತಂದುಕೊಟ್ಟಿದೆ. ಪ್ರಸ್ತುತ ಬಂಧಿತರಿಬ್ಬರನ್ನು ತೀವ್ರ ವಿಚಾರಣೆಗೆ ಒಳಪಡಿಸಲಾಗುತ್ತಿದ್ದು, ಇನ್ನೂ ಹಲವು ಕಳ್ಳತನ ಪ್ರಕರಣಗಳು ಬಯಲಾಗುವ ಆಶಾಭಾವನೆ ವ್ಯಕ್ತವಾಗಿದೆ.
arrest
ಪೆರ್ಡೂರು ಪ್ರದೀಪ್ ಪೂಜಾರಿ ಹಲ್ಲೆ, ಆತ್ಮಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಮಧ್ಯಪ್ರದೇಶದಲ್ಲಿ ಬಂಧನ..
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರು, ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲೆ ಅಕ್ಟೋಬರ್ 27ರ ರಾತ್ರಿ ಶ್ರಾವ್ಯಾ ಶೆಟ್ಟಿ ಕುಟುಂಬದವರು ಮೂರು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದರು ಎಂದು ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಅಕ್ಟೋಬರ್ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅಕ್ಟೋಬರ್ 30ರ ಸಂಜೆ 5:30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.
ವಿಶೇಷ ತಂಡಗಳ ರಚನೆ:
ಪ್ರಕರಣದ ತನಿಖೆಗಾಗಿ ಹಾಗೂ ಆರೋಪಿಗಳ ಪತ್ತೆಗೆ ಎಸ್ಪಿ ಅವರು 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದರು. ಅಧಿಕಾರಿ ಅಮಾನತು: ಪ್ರದೀಪ್ ಅವರ ಮೇಲೆ ಹಲ್ಲೆ ನಡೆದಾಗ ಆರಂಭದಲ್ಲಿ ಎಫ್ಐಆರ್ (FIR) ದಾಖಲಿಸದೆ ಕೇವಲ ಎನ್ಸಿ (NC) ದಾಖಲಿಸಿದ್ದ ಹಿರಿಯಡ್ಕ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (SI) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ಕರ್ತವ್ಯದಿಂದ ತೆರವುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಪೂರ್ವ ದೂರುಗಳು ಹಾಗೂ ಚಾರ್ಜ್ಶೀಟ್:ಇನ್ನೊಂದೆಡೆ, ಮೃತ ಪ್ರದೀಪ್ ಪೂಜಾರಿ ವಿರುದ್ಧವೂ ಯುವತಿ ಈ ಹಿಂದೆ 3 ಬಾರಿ ದೂರು ನೀಡಿದ್ದರು: 2025 ನವೆಂಬರ್ 10: ಬೆದರಿಕೆ ಕರೆ ಹಾಕಿದ ಆರೋಪ. ನವೆಂಬರ್ 29: ಅತ್ಯಾಚಾರ ಆರೋಪ. ಅಕ್ಟೋಬರ್ 28: ಖಾರದ ಪುಡಿ ಎರಚಿ ಕೊಲೆಯತ್ನ ನಡೆಸಿದ ಆರೋಪ. ಈ ಮೂರೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
arrest
ಕೊಲೆ ಮಾಡಿದ ಸ್ನೇಹಿತನೇ ಕನಸಿನಲ್ಲಿ ದೆವ್ವವಾಗಿ ಕಾಡಿದ! ಭಯ ತಾಳಲಾರದೆ ಪೊಲೀಸರಿಗೆ ಶರಣಾದ ಆರೋಪಿ
ಮದ್ಯದ ಪಾರ್ಟಿ ವೇಳೆ ಸ್ನೇಹಿತನನ್ನೇ ಹೊಡೆದು ಕೊಂದಿದ್ದ ಯುವಕ; 15 ದಿನಗಳ ಕಾಲ ನಿದ್ರೆಯಲ್ಲೂ ಕಾಡಿದ ಮೃತ ಸ್ನೇಹಿತನ ನೆನಪು – ಕೊನೆಗೆ ಕೊಲೆ ರಹಸ್ಯ ಬಯಲು
ಮುಂಬೈ: ಮದ್ಯದ ಪಾರ್ಟಿ ವೇಳೆ ಉಂಟಾದ ಜಗಳದಲ್ಲಿ ಸ್ನೇಹಿತನನ್ನೇ ಹೊಡೆದು ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ ಯುವಕನೊಬ್ಬ, ಕೊನೆಗೆ ಮೃತ ಸ್ನೇಹಿತ ಕನಸಿನಲ್ಲಿ ಪದೇಪದೇ ಬಂದು ಕಾಡುತ್ತಿದ್ದಾನೆಂಬ ಭಯದಿಂದ ಪೊಲೀಸರ ಮುಂದೆ ಶರಣಾಗಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಿವಾಸಿ, ಹೌಸ್ಕೀಪಿಂಗ್ ಕೆಲಸಗಾರ ಪ್ರಭು ಕಾರ್ಕಡೆ (24) ಬಂಧಿತ ಆರೋಪಿ. ಎರಡು ವಾರಗಳ ಹಿಂದೆ ಡೊಂಬಿವ್ಲಿ ಸಮೀಪದ ಮೋಥಾ ಗ್ರಾಮದಲ್ಲಿ ಪಲ್ಲವ್ ಅಲಿಯಾಸ್ ವಿಶಾಲ್ ಮಧುಕರ್ ಕದಮ್ (43) ಎಂಬವರ ಮೃತದೇಹ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಫುಲ್ಲ ಜಾಧವ್ ತಿಳಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಪ್ರಭು ನೀಡಿದ ಹೇಳಿಕೆಯ ಪ್ರಕಾರ, ಸ್ನೇಹಿತ ಕದಮ್ ಅವರ ಮನೆಯಲ್ಲೇ ಇಬ್ಬರೂ ಮದ್ಯಪಾನ ಮಾಡುತ್ತಿದ್ದಾಗ ಜಗಳ ಉಂಟಾಗಿತ್ತು. ಈ ವೇಳೆ ಆಕ್ರೋಶಗೊಂಡ ಪ್ರಭು, ಕದಮ್ ಅವರನ್ನು ಹೊಡೆದು ಕೊಲೆ ಮಾಡಿದ್ದಾನೆ.ಆತ ಮೃತಪಟ್ಟಿದ್ದ. ಸ್ನೇಹಿತ ಮೃತಪಟ್ಟಿರುವುದನ್ನು ಕಂಡು ಗಾಬರಿಗೊಂಡ ಪ್ರಭು, ತಕ್ಷಣ ತನ್ನ ಬಾಡಿಗೆ ಮನೆಯ ಮಾಲೀಕ ಸಂದೇಶ್ ಮ್ಹಾತ್ರೆ ಎಂಬಾತನ ಸಹಾಯ ಕೋರಿದ್ದಾನೆ. ಅವರಿಬ್ಬರೂ ಸೇರಿ ವಿಶಾಲ್ ಅವರ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ, ರಾತ್ರೋರಾತ್ರಿ ಹತ್ತಿರದ ನಿರ್ಜನ ಪ್ರದೇಶದಲ್ಲಿ ಎಸೆದು ಸಾಕ್ಷ್ಯ ನಾಶಪಡಿಸಿದ್ದರು. ಬಳಿಕ ಪರಾರಿಯಾಗಿದ್ದಾನೆ.
ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಆರಾಮವಾಗಿದ್ದ ಪ್ರಭುವಿಗೆ ಕೆಲವೇ ದಿನಗಳಲ್ಲಿ ಭಯ ಶುರುವಾಗಿದೆ. ಮೃತಪಟ್ಟ ಸ್ನೇಹಿತ ವಿಶಾಲ್ ಪದೇಪದೇ ಕನಸಿನಲ್ಲಿ ಬಂದು ಕಾಡುತ್ತಿದ್ದ. ಸುಮಾರು 15 ದಿನಗಳ ಕಾಲ ಸರಿಯಾಗಿ ನಿದ್ರೆ ಮಾಡಲೂ ಸಾಧ್ಯವಾಗದೆ ತೀವ್ರ ಆತಂಕಕ್ಕೆ ಒಳಗಾಗಿದ್ದ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.
ಕನಸಿನ ಭಯ ಹಾಗೂ ಪಶ್ಚಾತ್ತಾಪದಿಂದ ಕಂಗೆಟ್ಟ ಪ್ರಭು, ಕೊನೆಗೆ ತಾನಾಗಿಯೇ ಪೊಲೀಸರ ಬಳಿಗೆ ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ. ಸೋಮವಾರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ಮೃತದೇಹ ಎಸೆದಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.
ಈ ಸಂಬಂಧ ವಿಷ್ಣು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
arrest
ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.
ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್ವೆಲ್ ಉಜ್ಜೋಡಿ ಬಳಿಯ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
