Belthangady
ಜಮೀನು ಹೆಸರಿಗೆ ಮಾಡಿಸಿಕೊಡುವುದಾಗಿ ವಂಚನೆ..ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು
ಬೆಳ್ತಂಗಡಿ : ಜಮೀನು ನೋಂದಣಿ (ರಿಜಿಸ್ಟರ್) ಮಾಡಿಸಿಕೊಡುವುದಾಗಿ ನಂಬಿಸಿ ಬರೋಬ್ಬರಿ 1,00,61,250 ರೂಪಾಯಿಗಳನ್ನು ಪಡೆದು ವಂಚಿಸಿರುವ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ಗುರುವಾಯನಕೆರೆಯಲ್ಲಿ ಬೆಳಕಿಗೆ ಬಂದಿದೆ. ಈ ಸಂಬಂಧ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.
ಘಟನೆಯ ವಿವರ:
ಮಂಗಳೂರಿನ ಕೊಟ್ಟಾರ ಚೌಕಿಯ ನಿವಾಸಿ ಶಶಿಧರ ಅಚ್ಯುತ ತೋಟಂತಿಲ (61) ಎಂಬುವರು ನೀಡಿದ ದೂರಿನನ್ವಯ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ಆಪಾದಿತರಾದ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಸಸ್ಯೋಧ್ಯಾನ ನಿವಾಸಿಗಳಾದ ಸೋಮನಾಥ ನಾಯಕ್ ಮತ್ತು ರಂಜನ್ ರಾವ್ ಎರ್ಡೂರು ಎಂಬುವವರು ಈ ಕೃತ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ.
ದೂರುದಾರರು ಹಾಗೂ ರಂಜನ್ ರಾವ್ ನಡುವೆ ಕುವೆಟ್ಟು ಗ್ರಾಮದ ಸರ್ವೇ ನಂಬರ್ 85/3ಎ1 ರಲ್ಲಿದ್ದ 0.28.50 ಎಕರೆ ಜಮೀನಿಗೆ ಸಂಬಂಧಿಸಿದಂತೆ ಕರಾರು ಆಗಿತ್ತು. ಬಳಿಕ ಆರೋಪಿ ಸೋಮನಾಥ ನಾಯಕ್ ಅವರು, ರಂಜನ್ ರಾವ್ ಅವರಿಗೆ ಸೇರಿದ್ದು ಎನ್ನಲಾದ 0.70.25 ಎಕರೆ ಹಾಗೂ ತನಗೆ ಸೇರಿದ 0.28.50 ಎಕರೆ ಜಮೀನು ಸೇರಿದಂತೆ ಒಟ್ಟು 0.98.75 ಎಕರೆ ಭೂಮಿಯನ್ನು ದೂರುದಾರರ ಹೆಸರಿಗೆ ಕ್ರಯಾವಳಿ ಮಾಡಿ ಸ್ವಾಧೀನಕ್ಕೆ ಕೊಡುವುದಾಗಿ ಹೇಳಿದ್ದರು. ಇದಕ್ಕೆ ಒಟ್ಟು 90,00,000 ರೂಪಾಯಿಗೆ ಒಪ್ಪಂದ (ಕರಾರು) ಮಾಡಿಕೊಳ್ಳಲಾಗಿತ್ತು.
ಬ್ಯಾಂಕ್ ಖಾತೆಗಳಿಗೆ ಕೋಟ್ಯಂತರ ಹಣ ವರ್ಗಾವಣೆ:
ಕರಾರಿನಂತೆ ದೂರುದಾರ ಶಶಿಧರ ಅವರು ವಿವಿಧ ಹಂತಗಳಲ್ಲಿ ಹಾಗೂ ಆಪಾದಿತರು ಸೂಚಿಸಿದ ವಿವಿಧ ಬ್ಯಾಂಕ್ ಖಾತೆಗಳಿಗೆ ಹಣ ವರ್ಗಾಯಿಸಿದ್ದರು. ಆರೋಪಿಗಳಾದ ರಂಜನ್ ರಾವ್, ಸೋಮನಾಥ ನಾಯಕ್, ಅವರ ಪತ್ನಿ ವಿದ್ಯಾ ನಾಯಕ್, ದಯಾನಂದ ಪೂಜಾರಿ, ಬಾಬು ಎ., ಸಂದೀಪ್, ಹರೀಶ್ ಹಾಗೂ ಸೋಮಶೇಖರ್ ಅವರ ಕೆನರಾ ಬ್ಯಾಂಕ್ ಮತ್ತು ಯೂನಿಯನ್ ಬ್ಯಾಂಕ್ ಖಾತೆಗಳಿಗೆ ಒಟ್ಟು 1,00,61,250/- ರೂಪಾಯಿಗಳನ್ನು ಜಮಾ ಮಾಡಿಸಿಕೊಂಡಿದ್ದರು.
ಹಣ ಪಡೆದ ನಂತರವೂ ಜಮೀನು ದಾಖಲೆ ಮಾಡಿಕೊಡದಿದ್ದಾಗ ವಿಚಾರಿಸಿದಾಗ, ಸದರಿ ಜಮೀನು ಕುಮ್ಮಿ ಜಮೀನಾಗಿದ್ದು, ಅದನ್ನು ಅಕ್ರಮವಾಗಿ ಆಕ್ರಮಿಸಿಕೊಳ್ಳಲಾಗಿತ್ತು ಎಂಬ ಸತ್ಯ ಹೊರಬಂದಿದೆ. ಈ ಕುರಿತು ಕರ್ನಾಟಕ ಭೂಬಳಕೆ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆಯಲ್ಲಿದೆ. ಇದರಿಂದ ಬಚಾವಾಗಲು 2026 ರ ಮೇ 14 ರಂದು ಮತ್ತೊಂದು ಕೃಷಿ ಭೂಮಿಯನ್ನು ದಸ್ತಾವೇಜು ಮಾಡಿಕೊಟ್ಟು ವಂಚಿಸಿರುವುದು ಕಂಡುಬಂದಿದೆ.
ಸರಕಾರಿ ಜಮೀನನ್ನು ಸೇರಿಸಿ ವಂಚನೆ ಮಾಡಲಾಗಿದೆ ಎಂದು ದೂರುದಾರರು ತಿಳಿಸಿದ್ದು, ಈ ಸಂಬಂಧ ಬೆಳ್ತಂಗಡಿ ಠಾಣೆ ಪೊಲೀಸರು ಭಾರತೀಯ ನ್ಯಾಯ ಸಂಹಿತೆ (BNS) 2023 ರ ಕಾಯ್ದೆಯಡಿ Crime No. 91/2026 ರಂತೆ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ.
ಈ ನಡುವೆ, ತಮ್ಮ ಮೇಲಿನ ಎಲ್ಲಾ ಆರೋಪಗಳನ್ನು ತಳ್ಳಿಹಾಕಿರುವ ಸೋಮನಾಥ್ ನಾಯಕ್ ಮತ್ತು ಭೂ ಮಾಲಕ ರಂಜನ್ ರಾವ್ ಎಡೂರು, ಕರಾರಿನ ಪ್ರಕಾರ ಕುಮ್ಮಿ ಹಕ್ಕು ಸಹಿತ 28.50 ಸೆಂಟ್ಸ್ ಭೂಮಿಯನ್ನು ಈಗಾಗಲೇ ನೋಂದಣಿ ಮಾಡಿಕೊಡಲಾಗಿದ್ದು, ಸರ್ವೇಯರ್‌ಗಳ ಸುದೀರ್ಘ ಮುಷ್ಕರದಿಂದಾಗಿ ನಕ್ಷೆ ಸಿದ್ಧವಾಗದೆ ಉಳಿದ 10.50 ಸೆಂಟ್ಸ್ ನೋಂದಣಿ ಬಾಕಿಯಿದೆ ಎಂದು ಸ್ಪಷ್ಟಪಡಿಸಿದ್ದಾರೆ. ನಾವು ಯಾರಿಗೂ ವಂಚನೆ ಮಾಡಿಲ್ಲ, ಯಾವುದೇ ವಿಷಯ ಮುಚ್ಚಿಟ್ಟಿಲ್ಲ ಹಾಗೂ ನೋಂದಣಿಗೂ ಮುನ್ನವೇ ಭೂಮಿಯನ್ನು ಅವರ ಸ್ವಾಧೀನಕ್ಕೆ ನೀಡಿದ್ದು, ಭೂಕಬಳಿಕೆ ನಿಷೇಧ ಕೋರ್ಟ್ ವ್ಯಾಪ್ತಿಗೆ ಕುಮ್ಮಿ ಭೂಮಿ ಬರುವುದಿಲ್ಲ ಎಂಬುದು ನೋಂದಣಿಯಾದ ಕೆಲವು ವಾರಗಳ ಬಳಿಕ ನಮಗೆ ತಿಳಿದುಬಂದಿದೆ ಎಂದು ತಿಳಿಸಿದ್ದಾರೆ. ದೂರುದಾರರು ಸಜ್ಜನರಾಗಿದ್ದು, ನಮ್ಮೊಂದಿಗೆ ಚರ್ಚಿಸದೆ ಯಾರದ್ದೋ ಕುಮ್ಮಕ್ಕಿನಿಂದ ಏಕಾಏಕಿ ಪೊಲೀಸ್ ದೂರು ನೀಡಿರುವುದು ಬೇಸರ ತಂದಿದೆ; ಅವರಿಗೆ ಭೂಮಿ ಬೇಡವಾದಲ್ಲಿ ಹಣ ಹಿಂತಿರುಗಿಸಲು ನಾವು ಸಿದ್ಧರಿದ್ದು, ಇದುವರೆಗೆ ನಡೆಸಿದ ಯಾವ ಭೂ ವ್ಯವಹಾರದಲ್ಲೂ ಯಾರಿಗೂ ವಂಚನೆ ಮಾಡಿಲ್ಲ ಎಂದು ಅವರು ಹೇಳಿದ್ದಾರೆ.
Belthangady
ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು – ಕಾರ್ಮಿಕರ ಮೇಲೆ ಅನುಮಾನ
ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.
ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.
ಘಟನೆಯ ವಿವರ:
ಅವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಗೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.
ಸೆ.14 ರಂದು ಫಾಲ್ಸ್ ಸೀಲಿಂಗ್ ವೈರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರು.
ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್‌ರೂಂನ ಗೋದ್ರೇಜ್‌ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.
ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರೇಸ್ಲೆಟ್ ಸೇರಿದಂತೆ 15 ಲಕ್ಷ 82 ಸಾವಿರ ರೂ. ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.
ಇದಲ್ಲದೆ ನೌಫಾಲ್ ಅವರ ತಾಯಿಯ ಗೋದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ.
ಮನೆಯ ಗೋದ್ರೇಜ್‌ನ ಕೀ ಗೋದ್ರೇಜ್‌ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗೋದ್ರೇಜ್ ತೆರೆದು ಕಳವು ಮಾಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.
ವೈರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.
ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
arrest
ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ
ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.
ಘಟನೆ ವಿವರ:
ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.
ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.
ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ದೂರು ಮತ್ತು ಬಂಧನ:
ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.
ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.
ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.
40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.
accident
ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರು ಚಾಲಕನಿಗೆ ಗಂಭೀರ ಗಾಯ
ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.
ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಈ ವೇಳೆ ಕಾರು ಚಾಲಕನ ಕೈ ಮುರಿತವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
-
accident2 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala2 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime8 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime6 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala6 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala8 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident2 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident4 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
