Connect with us

Belthangady

ಜಮೀನು ತಕರಾರು: 75 ವರ್ಷದ ವೃದ್ಧೆಯ ಮೇಲೆ ಹಲ್ಲೆ, ಏಳು ಮಂದಿ ವಿರುದ್ಧ FIR ದಾಖಲು

Published

on

ಬೆಳ್ತಂಗಡಿ: ಜಮೀನು ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ತಕರಾರಿನಲ್ಲಿ 75 ವರ್ಷದ ವೃದ್ಧೆಯೊಬ್ಬರ ಮೇಲೆ ಗುಂಪೊಂದು ಹಲ್ಲೆ ನಡೆಸಿ, ಜೀವ ಬೆದರಿಕೆಯೊಡ್ಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ತೆಕ್ಕಾರು ಗ್ರಾಮದ ಬಜಾರಿನಲ್ಲಿ ನಡೆದಿದೆ.

ಘಟನೆಗೆ ಸಂಬಂಧಿಸಿ ಬಜಾರು ತೇಕ್ಕಾರು ಗ್ರಾಮದ ನಿವಾಸಿ ಬಿಪಾತುಮ್ಮ ಬಿ. (75) ಅವರು ನೀಡಿರುವ ದೂರಿನನ್ವಯ ಪೊಲೀಸರು 7 ಜನರ ವಿರುದ್ಧ ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಆರೋಪಿಗಳ ವಿವರ:

  1. ಅಬೂಬಕ್ಕರ್ (A1)
  2. ತೌಸಿಫ್ (A2)
  3. ಸತ್ತಾರ್ (A3)
  4. ಸುಲೇಮಾನ್ (A4)
  5. ಹ್ಯಾರೀಸ್ (A5)
  6. ಅಬ್ದುಲ್ ರಜಾಕ್ (A6)
  7. ಫರ್ದಾನ (A7)

ಘಟನೆಯ ಹಿನ್ನೆಲೆ:

ಆಗಸ್ಟ್ 25ರಂದು ಮಧ್ಯಾಹ್ನ ಸುಮಾರು 3:30ರ ವೇಳೆಗೆ ದೂರುದಾರರಾದ ಬಿಪಾತುಮ್ಮ ಅವರ ಮಗ ಅಬ್ದುಲ್ ನಜೀರ್ ಎಂಬುವವರು ತಮ್ಮ ಜಮೀನಿನಲ್ಲಿ (ಸರ್ವೆ ನಂಬ್ರ 141/3P1 ಮತ್ತು 64/1P1) ಜೆಸಿಬಿ ಯಂತ್ರದ ಮೂಲಕ ಕೆಲಸ ಮಾಡುತ್ತಿದ್ದರು. ಈ ವೇಳೆ ಸ್ಥಳಕ್ಕೆ ಬಂದ ನೆರೆ ಜಮೀನಿನ ಮಾಲೀಕರಾದ ಮಹಮ್ಮದ್ ಎಂಬವರ ಮಕ್ಕಳಾದ ಅಬೂಬಕ್ಕರ್, ತೌಸಿಫ್, ಸತ್ತಾರ್, ಸುಲೇಮಾನ್ ಹಾಗೂ ಅವರ ಸಂಬಂಧಿಕರಾದ ಹ್ಯಾರೀಸ್, ಅಬ್ದುಲ್ ರಜಾಕ್, ಫರ್ದಾನ ಹಾಗೂ ಮಹಮ್ಮದ್ ಅವರ ಮಗಳ ಗಂಡ ಅಕ್ರಮ್ ಅಕ್ರಮವಾಗಿ ಜಮೀನಿಗೆ ಪ್ರವೇಶಿಸಿದ್ದಾರೆ.

“ಈ ಜಾಗ ನಮ್ಮದು, ನೀವು ಇಲ್ಲಿ ಕೆಲಸ ಮಾಡಬಾರದು, ಇಲ್ಲಿ ಕೆಲಸ ಮಾಡಿದರೆ ಮುಂದಕ್ಕೆ ನೋಡಿಕೊಳ್ಳುತ್ತೇವೆ” ಎಂದು ಆರೋಪಿಗಳು ಬೆದರಿಕೆ ಹಾಕಿದ್ದಾರೆ. ಬಳಿಕ ದೂರುದಾರರ ಮಕ್ಕಳ ಮೇಲೆ ಹಲ್ಲೆಗೆ ಮುಂದಾಗಿದ್ದಾರೆ.

ವೃದ್ಧೆಯ ಮೇಲೆ ಹಲ್ಲೆ:

ಈ ಗಲಾಟೆಯನ್ನು ತಡೆಯಲು ಮಧ್ಯಪ್ರವೇಶಿಸಿದ 75 ವರ್ಷದ ವೃದ್ಧೆ ಬಿಪಾತುಮ್ಮ ಅವರ ಕೈಯನ್ನು ಹಿಡಿದು ಎಳೆದಾಡಿದ ಆರೋಪಿಗಳು, ಕಾಲಿನಿಂದ ಒದ್ದು ಹಲ್ಲೆ ನಡೆಸಿದ್ದಾರೆ. ಇದೇ ವೇಳೆ ಆರೋಪಿ ಸುಲೇಮಾನ್ ಎಂಬಾತ ತನ್ನ ಕೈಯಲ್ಲಿದ್ದ ಕೊಡೆಯಿಂದ ಹೊಡೆಯಲು ಬಂದಾಗ, ದೂರುದಾರರು ನೆಲಕ್ಕೆ ಬಿದ್ದಿದ್ದು, ಬೆನ್ನು ಹಾಗೂ ಮೂಳೆಗಳಿಗೆ ಬಲವಾದ ಪೆಟ್ಟು ಬಿದ್ದು ಗಾಯಗೊಂಡಿದ್ದಾರೆ.

ಗಾಯಗೊಂಡ ವೃದ್ಧೆಯನ್ನು ತಕ್ಷಣವೇ ಪುತ್ತೂರು ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಒಳರೋಗಿಯಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಪೊಲೀಸ್ ಕಾನೂನು ಕ್ರಮ:

ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವೃದ್ಧೆಯ ಹೇಳಿಕೆ ಪಡೆದ ಪೊಲೀಸರು, ಆರೋಪಿಗಳ ವಿರುದ್ಧ ಭಾರತೀಯ ನ್ಯಾಯ ಸಂಹಿತೆ (BNS) 2023ರ ನಿಯಮಗಳಡಿ ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ಕೈಗೊಂಡಿದ್ದಾರೆ

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

Published

on

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್‌ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.

ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್‌ವೆಲ್ ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

Belthangady

ಸೌಜನ್ಯ ಪ್ರಕರಣದ ತನಿಖಾ ಸಮಿತಿ ಪುನಾರಚನೆ: ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಮುಖ್ಯಸ್ಥರಾಗಿ ನೇಮಕ

Published

on

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿ ತಿದ್ದುಪಡಿ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆ (ಅಪರಾಧಗಳು) ದಿನಾಂಕ 30-10-2026 ರಂದು ಆದೇಶ ಸಂಖ್ಯೆ: ಹೆಚ್‌ಸಿಡಿ 228 ಸಿಒಡಿ 2026 ರಂತೆ ಈ ತಿದ್ದುಪಡಿ ಆದೇಶವನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 24, 2026 ರಂದು ಹೊರಡಿಸಿದ್ದ ಮೂಲ ಆದೇಶದ ಕೋಷ್ಟಕದ ಕ್ರಮ ಸಂಖ್ಯೆ 01 ಮತ್ತು 05 ರಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸಲಾಗಿದೆ.

ತಿದ್ದುಪಡಿ ಆದೇಶದ ಪ್ರಕಾರ:

  1. ಶ್ರೀ ಚೇತನ್ ಸಿಂಗ್ ರಾಥೋಡ್, ಐಪಿಎಸ್, ಐಜಿಪಿ, ಸಿಐಡಿ, ಬೆಂಗಳೂರು – ಮುಖ್ಯಸ್ಥರಾಗಿ ನೇಮಕ
  2. ಶ್ರೀ ಶ್ರೀನಿಧಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ – ಸದಸ್ಯರಾಗಿ ನೇಮಕ

ಈ ಇಬ್ಬರು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರ ಸಹಿಯಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಆದೇಶದ ಪ್ರತಿಯನ್ನು ಡಿಜಿ & ಐಜಿಪಿ, ಸಿಐಡಿ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ರವಾನಿಸಲಾಗಿದೆ.

Continue Reading

Belthangady

ಸೌಜನ್ಯ ಕೇಸ್ ಮರುತನಿಖೆಗೆ ಬಿಗ್ ಟ್ವಿಸ್ಟ್: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್!

Published

on

ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ (SIT) ಮರುತನಿಖೆ ಬಿರುಸಿನಿಂದ ಸಾಗುತ್ತಿರುವ ನಡುವೆಯೇ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದೆ. ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DG-IGP) ಲಿಖಿತ ಮನವಿ ಸಲ್ಲಿಸಿದ್ದಾರೆ.

ಹೋರಾಟಗಾರರ ಅಪಸ್ವರ ಮತ್ತು ವಿರೋಧ: ಸೌಜನ್ಯ ಕುಟುಂಬಸ್ಥರು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂಘಟನೆಗಳು ಐಜಿಪಿ ಶಶಿಕುಮಾರ್ ಅವರ ನೇಮಕಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಶಶಿಕುಮಾರ್ ಅವರು ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದ ವೇಳೆ ಸ್ಥಳೀಯ ಪ್ರಭಾವಿಗಳೊಂದಿಗೆ ಒಡನಾಟ ಹೊಂದಿದ್ದರು, ಹೀಗಾಗಿ ಅವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದರು. ಇತ್ತೀಚೆಗೆ ಹೋರಾಟಗಾರರ ನಿಯೋಗವು ಗೃಹ ಸಚಿವರನ್ನು ಭೇಟಿಯಾಗಿ ಎಸ್‌ಐಟಿ ಮುಖ್ಯಸ್ಥರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತಲ್ಲದೆ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿಯೂ ಎಚ್ಚರಿಸಿತ್ತು.

ತನಿಖೆಯ ಪಾರದರ್ಶಕತೆಗಾಗಿ ನಿರ್ಧಾರ: ಸಾರ್ವಜನಿಕ ವಲಯದಲ್ಲಿ ಎದ್ದಿರುವ ಅಪಸ್ವರಗಳು ಹಾಗೂ ತನಿಖೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶಶಿಕುಮಾರ್ ಅವರು ಸ್ವತಃ ತಾವೇ ಈ ಜವಾಬ್ದಾರಿಯಿಂದ ಕೈಬಿಡುವಂತೆ ಡಿಜಿ-ಐಜಿಪಿ ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ವಿಶೇಷವೆಂದರೆ, ಅಕ್ಟೋಬರ್ 28 ರಂದು ಶಶಿಕುಮಾರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮರುತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದರು. ಅಲ್ಲದೆ, ಅಕ್ಟೋಬರ್ 30 ರಂದು ಆರಂಭಿಕ ತನಿಖಾಧಿಕಾರಿಗಳು ಹಾಗೂ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿತ್ತು. ಈ ಹಂತದಲ್ಲೇ ಮುಖ್ಯಸ್ಥರು ಹಿಂದೆ ಸರಿಯಲು ಮನವಿ ಮಾಡಿರುವುದು ಕುತೂಹಲ ಮೂಡಿಸಿದೆ.

ಈಗಾಗಲೇ ತಂಡದ ಮತ್ತೊಬ್ಬ ಪ್ರಮುಖ ಸದಸ್ಯರಾದ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಅವರು ವೈಯಕ್ತಿಕ ಕಾರಣಗಳಿಂದ ಹೊರಬಂದಿದ್ದು, ಇದೀಗ ಮುಖ್ಯಸ್ಥರೂ ವಿನಾಯಿತಿ ಕೋರಿರುವುದರಿಂದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಎಸ್‌ಐಟಿಗೆ ನೂತನ ದಕ್ಷ ಅಧಿಕಾರಿಯನ್ನು ನೇಮಕ ಮಾಡುವ ಸಾಧ್ಯತೆಯಿದೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!