Connect with us

arrest

ಜಂತರ್ ಮಂತರ್ ಹಲ್ಲೆ ಪ್ರಕರಣ: ಸಿಜೆಪಿ ಪ್ರತಿಭಟನೆಯ ಬೆನ್ನಲ್ಲೇ ಹೆಲ್ಮೆಟ್ ಧರಿಸಿ ಬೈಕ್‌ನಲ್ಲಿ ಪರಾರಿಯಾಗಲು ಯತ್ನಿಸಿದ್ದ ‘ಕಟ್ಟರ್ ಹಿಂದೂ’ ಭಾರದ್ವಾಜ್ ದೆಹಲಿ ಪೊಲೀಸರ ವಶಕ್ಕೆ; ಪೋಕ್ಸೋ, SC/ST ಕಾಯ್ದೆಯಡಿ ಹೊಸ FIR

Published

on

ಬುಲಂದ್‌ಶಹರ್/ದೆಹಲಿ/ಲಖನೌ: ದೆಹಲಿಯ ಜಂತರ್ ಮಂತರ್‌ನಲ್ಲಿ ಜುಲೈ 20 ರಂದು ನಡೆದ ಪ್ರತಿಭಟನೆಯ ವೇಳೆ ವಿದ್ಯಾರ್ಥಿ ಕಾರ್ಯಕರ್ತೆ ನಿಶಾ (ನಿಶು) ಆಝಾದ್ ಅವರ ತಂದೆ ಸಂಜಯ್ ಕುಮಾರ್ ಅವರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿದ್ದ ಸ್ವಯಂಘೋಷಿತ ‘ಕಟ್ಟರ್ ಹಿಂದೂ’ ಪ್ರಭಾವಿ ಸ್ವತಂತ್ರ ಭಾರದ್ವಾಜ್‌ನನ್ನು ದೆಹಲಿ ಪೊಲೀಸರು ಶುಕ್ರವಾರ ಉತ್ತರ ಪ್ರದೇಶದ ಬುಲಂದ್‌ಶಹರ್‌ನಲ್ಲಿ ವಶಕ್ಕೆ ಪಡೆದಿದ್ದಾರೆ.

ಈ ಬೆಳವಣಿಗೆಯ ಬೆನ್ನಲ್ಲೇ ಆರೋಪಿ ಭಾರದ್ವಾಜ್ ವಿರುದ್ಧ ಪೋಕ್ಸೋ (POCSO) ಕಾಯ್ದೆಯಡಿ ಹೊಸ ಎಫ್‌ಐಆರ್ (FIR) ದಾಖಲಿಸಲಾಗಿದ್ದು, ಈ ಹಿಂದೆ ದಾಖಲಾಗಿದ್ದ ಪ್ರಕರಣಕ್ಕೆ ಎಸ್‌ಸಿ/ಎಸ್‌ಟಿ (SC/ST) ಕಾಯ್ದೆಯ ಸಂಬಂಧಿತ ಕಠಿಣ ಸೆಕ್ಷನ್‌ಗಳನ್ನು ಸೇರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.

ಪಾರ್ಲಿಮೆಂಟ್ ಸ್ಟ್ರೀಟ್ ಠಾಣೆಗೆ ‘ಕಾಕ್ರೋಚ್ ಜನತಾ ಪಕ್ಷ’ ಮುತ್ತಿಗೆ

ಆರೋಪಿ ಭಾರದ್ವಾಜ್ ವಿರುದ್ಧ ತಕ್ಷಣವೇ ಕಠಿಣ ಕ್ರಮ ಕೈಗೊಳ್ಳಬೇಕು ಮತ್ತು ಆತನನ್ನು ಬಂಧಿಸಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ ಪಕ್ಷ (CJP) ಶುಕ್ರವಾರ ರಾಷ್ಟ್ರ ರಾಜಧಾನಿಯ ಪಾರ್ಲಿಮೆಂಟ್ ಸ್ಟ್ರೀಟ್ ಪೊಲೀಸ್ ಠಾಣೆಯ ಹೊರಗೆ ಬೃಹತ್ ಪ್ರತಿಭಟನೆ ನಡೆಸಿ ಠಾಣೆಗೆ ಮುತ್ತಿಗೆ ಹಾಕಿತ್ತು. ಪ್ರತಿಭಟನಾಕಾರರ ತೀವ್ರ ಆಕ್ರೋಶಕ್ಕೆ ಮಣಿದ ದೆಹಲಿ ಪೊಲೀಸರು, 72 ಗಂಟೆಗಳ ಒಳಗೆ ಆರೋಪಿಯನ್ನು ಬಂಧಿಸುವುದಾಗಿ ಭರವಸೆ ನೀಡಿದ್ದರು. ಭರವಸೆ ನೀಡಿದ ಕೆಲವೇ ಗಂಟೆಗಳಲ್ಲಿ ದೆಹಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಹಲ್ಲೆ ಸಮರ್ಥಿಸಿಕೊಂಡಿದ್ದ ವೈರಲ್ ಪಾಡ್‌ಕಾಸ್ಟ್

ಸಾಮಾಜಿಕ ಜಾಲತಾಣಗಳಲ್ಲಿ ಭಾರದ್ವಾಜ್ ಭಾಗವಹಿಸಿದ್ದ ಪಾಡ್‌ಕಾಸ್ಟ್ ವೀಡಿಯೊ ತುಣುಕೊಂದು ತೀವ್ರ ವೈರಲ್ ಆಗಿತ್ತು. ಅದರಲ್ಲಿ ಆತನ ಬಳಿ ಸಂಜಯ್ ಕುಮಾರ್ ಅವರ ‘ತಲೆಬುರುಡೆ ಒಡೆದಿದ್ದೇನೆ’ ಎಂದು ಬಹಿರಂಗವಾಗಿ ಹೆಮ್ಮೆಪಡುತ್ತಾ ಹೇಳಿಕೊಂಡಿದ್ದನು. ಗಂಭೀರ ಹಲ್ಲೆ ನಡೆಸಿದ್ದರೂ ರಾಜಕೀಯ ನಾಯಕರೊಂದಿಗಿನ ಪ್ರಭಾವಿ ಸಂಪರ್ಕದಿಂದಾಗಿ ತಾನು ಜೈಲಿಗೆ ಹೋಗದೆ ಹೊರಗಿದ್ದೇನೆ ಎಂದು ಹೆಮ್ಮೆಯಿಂದ ಹೇಳಿಕೊಂಡಿದ್ದ. ಇದು ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶಕ್ಕೆ ಕಾರಣವಾಗಿತ್ತು.

ಗುರುತು ಮರೆಮಾಚಿ ಬೈಕ್‌ನಲ್ಲಿ ಪರಾರಿಯಾಗಲು ಯತ್ನ!

ತನ್ನನ್ನು ಪತ್ತೆಹಚ್ಚಲು ದೆಹಲಿ ಪೊಲೀಸರ ಹಲವಾರು ತಂಡಗಳು ನಿಯೋಜನೆಯಾಗಿವೆ ಎಂದು ತಿಳಿಯುತ್ತಿದ್ದಂತೆ, ಭಾರದ್ವಾಜ್ ಶುಕ್ರವಾರ ಮುಂಜಾನೆ ಉತ್ತರ ಪ್ರದೇಶದ ಬುಲಂದ್‌ಶಹರ್‌ಗೆ ಆಗಮಿಸಿ, ನೈತ್ಲಾ ಗ್ರಾಮದ ಸ್ಥಳೀಯರೊಬ್ಬರ ಮನೆಯಲ್ಲಿ ಆಶ್ರಯ ಪಡೆದಿದ್ದ.

ಸ್ಥಳೀಯ ನಿವಾಸಿ ಶರ್ಮಾ ಮಾತನಾಡಿ, “ಭಾರದ್ವಾಜ್ ಮನೆಗೆ ಬಂದಾಗ ಅನುಮಾನ ಬರಲಿಲ್ಲ. ಆದರೆ ಗ್ರಾಮಕ್ಕೆ ಮಾಧ್ಯಮದವರು ಬರಲು ಪ್ರಾರಂಭಿಸಿದಾಗ ಸಂಶಯ ಮೂಡಿತು. ಬಳಿಕ ಆತ ನನ್ನ ಬೈಕ್ ತೆಗೆದುಕೊಂಡು ಹೋಗಿದ್ದ,” ಎಂದು ವಿವರಿಸಿದ್ದಾರೆ.

ಪೊಲೀಸ್ ತಂಡಗಳು ತಲುಪುವಷ್ಟರಲ್ಲಿ ತನ್ನ ಗುರುತು ಯಾರಿಗೂ ಸಿಗದಂತೆ ಹೆಲ್ಮೆಟ್ ಧರಿಸಿದ್ದ ಭಾರದ್ವಾಜ್, ಬುಲೆಟ್ ಮೋಟಾರ್‌ಸೈಕಲ್‌ನಲ್ಲಿ ನೈತ್ಲಾ ಗ್ರಾಮದಿಂದ ಖುರ್ಜಾ ಕಡೆಗೆ ಪರಾರಿಯಾಗಿದ್ದ. ಈ ಕುರಿತು ಪೊಲೀಸ್ ಅಧಿಕಾರಿ ದೀಪಕ್ ಕುಮಾರ್ ಮಾಹಿತಿ ನೀಡಿ, ವಾಟ್ಸಾಪ್ ಮೂಲಕ ಆರೋಪಿ ಬುಲಂದ್‌ಶಹರ್‌ನಲ್ಲಿರುವ ಸುಳಿವು ಸಿಕ್ಕ ತಕ್ಷಣ ಸ್ಥಳೀಯ ಪೊಲೀಸ್ ತಂಡವನ್ನು ಕಳುಹಿಸಲಾಗಿತ್ತು, ಆದರೆ ಆತ ಅಲ್ಲಿಂದ ಕಾಲ್ಕಿತ್ತಿದ್ದ ಎಂದು ತಿಳಿಸಿದ್ದಾರೆ.

ಬಳಿಕ ಸಾದಾ ಉಡುಪಿನಲ್ಲಿದ್ದ ದೆಹಲಿ ಪೊಲೀಸರ ವಿಶೇಷ ತಂಡವು ಧಮೇಡಾ ನಾರಾ ಗ್ರಾಮದ ಬಳಿ ಕಾರ್ಯಾಚರಣೆ ನಡೆಸಿ ಆತನನ್ನು ವಶಕ್ಕೆ ಪಡೆಯುವಲ್ಲಿ ಯಶಸ್ವಿಯಾಗಿದೆ.

ಅತ್ಯಾಚಾರ ಬೆದರಿಕೆ ಹಾಕಿದ್ದರೆಂದು ಸಂತ್ರಸ್ತ ವಿದ್ಯಾರ್ಥಿನಿ ಆರೋಪ

ತಂದೆಯ ಮೇಲಿನ ಹಲ್ಲೆಯ ವಿರುದ್ಧ ದೂರು ನೀಡಿದ ಬಳಿಕ ತನಗೆ ನಿರಂತರವಾಗಿ ಅವಾಚ್ಯ ಶಬ್ದಗಳಿಂದ ನಿಂದನೆ ಮತ್ತು ಅತ್ಯಾಚಾರದ ಬೆದರಿಕೆಗಳು ಬಂದಿದ್ದವು ಎಂದು ವಿದ್ಯಾರ್ಥಿನಿ ನಿಶಾ ಆಝಾದ್ ಗಂಭೀರ ಆರೋಪ ಮಾಡಿದ್ದಾರೆ.

“ಭಯದಿಂದಾಗಿ ನನಗೆ ಹೊರಗೆ ಕಾಲಿಡಲು ಸಾಧ್ಯವಾಗುತ್ತಿರಲಿಲ್ಲ. ಕೆಲವು ವಾರಗಳ ಕಾಲ ಶಾಲೆಗೂ ಹೋಗಲು ಸಾಧ್ಯವಾಗಲಿಲ್ಲ. ಈಗ ಪೊಲೀಸರು ಸೂಕ್ತ ಕ್ರಮ ಕೈಗೊಳ್ಳುತ್ತಾರೆ ಎಂಬ ಭರವಸೆ ಇದೆ,” ಎಂದು ನಿಶಾ ಆಝಾದ್ ಹೇಳಿದ್ದಾರೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

6 ವರ್ಷಗಳಿಂದ ವಿದೇಶದಲ್ಲಿದ್ದ ವಾರೆಂಟ್ ಆರೋಪಿ ವಿಮಾನ ನಿಲ್ದಾಣದಲ್ಲಿ ಅರೆಸ್ಟ್: ಬಂಟ್ವಾಳ ಪೊಲೀಸರ ಕಾರ್ಯಾಚರಣೆ

Published

on

ಮಂಗಳೂರು: ನ್ಯಾಯಾಲಯದ ವಿಚಾರಣೆಗೆ ಹಾಜರಾಗದೆ ಕಳೆದ 6 ವರ್ಷಗಳಿಂದ ವಿದೇಶದಲ್ಲಿ ತಲೆಮರೆಸಿಕೊಂಡಿದ್ದ ವಾರೆಂಟ್ ಆರೋಪಿಯನ್ನು ಬಂಟ್ವಾಳ ನಗರ ಪೊಲೀಸರು ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ವಶಕ್ಕೆ ಪಡೆದಿದ್ದಾರೆ.

ಮಂಗಳೂರು ಬಜಾಲ್‌ನಂತೂರು ನಿವಾಸಿ ಮಹಮ್ಮದ್ ನೌಫಲ್ @ ಸಫಾರಿ ನೌಫಲ್ (34) ದಸ್ತಗಿರಿಯಾದ ಆರೋಪಿ.

ಪ್ರಕರಣದ ವಿವರ: ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಪ್ರಕರಣಕ್ಕೆ (ಅ.ಕ್ರ: 24/2020, ಐಪಿಸಿ ಕಲಂ: 143, 147, 148, 504, 323, 324, 506, 427 r/w 149 ಮತ್ತು ಕಾವಲು ಕಾಯ್ದೆ) ಸಂಬಂಧಿಸಿದಂತೆ ಈಾತನು ಮಾನ್ಯ ನ್ಯಾಯಾಲಯಕ್ಕೆ ವಿಚಾರಣೆಗೆ ಹಾಜರಾಗದೆ ವಿದೇಶಕ್ಕೆ ಪರಾರಿಯಾಗಿದ್ದ. ಈತನ ವಿರುದ್ಧ ನ್ಯಾಯಾಲಯದಿಂದ ವಾರೆಂಟ್ ಜಾರಿಯಾಗಿತ್ತು.

ಸೆಪ್ಟೆಂಬರ್ 15, 2026ರಂದು ವಿದೇಶದಿಂದ ಮನೆಗೆ ಹಿಂತಿರುಗುತ್ತಿದ್ದ ವೇಳೆ, ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಇಮಿಗ್ರೇಷನ್ ವಿಭಾಗದ ಸಹಾಯದಿಂದ ಬಂಟ್ವಾಳ ನಗರ ಪೊಲೀಸರು ಆರೋಪಿಯನ್ನು ಯಶಸ್ವಿಯಾಗಿ ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಮಾನ್ಯ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದ್ದು, ನ್ಯಾಯಾಲಯವು ಸೆಪ್ಟೆಂಬರ್ 29, 2026ರವರೆಗೆ ನ್ಯಾಯಾಂಗ ಬಂಧನ ವಿಧಿಸಿ ಆದೇಶಿಸಿದೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

arrest

ಕರಿಕೆ: ಕೇರಳ ಮೀಸಲು ಅರಣ್ಯದಲ್ಲಿ ಕಡವೆ ಬೇಟೆಯಾಡಿ ಮಾಂಸ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ; ಓರ್ವನ ಬಂಧನ, 40 ಕೆಜಿ ಮಾಂಸ ವಶ

Published

on

ಕರಿಕೆ ಸಮೀಪದ ಕೇರಳ ಮೀಸಲು ಅರಣ್ಯ ಪ್ರದೇಶದಲ್ಲಿ ಅಕ್ರಮವಾಗಿ ಕಡವೆ ಬೇಟೆಯಾಡಿ, ಮಾಂಸ ಮಾರಾಟ ಮಾಡುತ್ತಿದ್ದ ಜಾಲವನ್ನು ಕೇರಳ ಅರಣ್ಯ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿ ಭೇದಿಸಿದ್ದು, ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

ಕರಿಕೆ ತೋಟಮ್ ನಿವಾಸಿ ಸಿದ್ದು (35) ಬಂಧಿತ ಆರೋಪಿ. ಈ ಕೃತ್ಯದಲ್ಲಿ ಭಾಗಿಯಾಗಿದ್ದ ಇತರ ಇಬ್ಬರು ಆರೋಪಿಗಳಾದ ಜಿ.ಎಸ್. ವಿನೀಶ್ ಮತ್ತು ವಿಮಲ್ ರಾಜ್ ಪರಾರಿಯಾಗಿದ್ದಾರೆ.

ಕರಿಕೆ ಸಮೀಪದ ತೋಟಮ್ ಬಳಿಯ ಕೇರಳ ಮೀಸಲು ಅರಣ್ಯದ ಗೇರು ತೋಟಿನ ಕಾಟೂರ್ ಕೊಪ್ಪು ಎಂಬಲ್ಲಿ ಈ ಅಕ್ರಮ ಚಟುವಟಿಕೆ ನಡೆಯುತ್ತಿತ್ತು. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅರಣ್ಯ ಇಲಾಖೆ ಅಧಿಕಾರಿಗಳು, ಆರೋಪಿಯಿಂದ ಒಂದು ನಾಡ ಬಂದೂಕು, ಸುಮಾರು 40 ಕೆಜಿ ಕಡವೆ ಮಾಂಸ ಹಾಗೂ ಬೇಟೆಗೆ ಬಳಸಿದ್ದ ಇತರೆ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಿ, ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದೆ. ಕಾಸರಗೋಡು ವಲಯದ ಅರಣ್ಯ ಅಧಿಕಾರಿಗಳಾದ ರಾಜು ಎಂ.ಪಿ., ಪ್ರಕಾಶ್ ವಿ.ಪಿ. ಹಾಗೂ ಪ್ರವೀಣ್ ಕುಮಾರ್ ಅವರನ್ನೊಳಗೊಂಡ ತಂಡ ಈ ಕಾರ್ಯಾಚರಣೆಯಲ್ಲಿ ಯಶಸ್ವಿಯಾಗಿ ಭಾಗವಹಿಸಿತ್ತು

Continue Reading

Trending

Copyright © 2025 Deevatige

error: Content is protected !!