Connect with us

BJP

ಬೆಚ್ಚಿಬೀಳಿಸಿದ ಚುನಾವಣಾ ಆಯೋಗದ ಆಂತರಿಕ ಬಿಕ್ಕಟ್ಟು: ಮುಖ್ಯ ಚುನಾವಣಾ ಆಯುಕ್ತಗೆ CJP ಯಿಂದ 48 ಗಂಟೆಗಳ ಡೆಡ್‌ಲೈನ್, ರಾಜೀನಾಮೆಗೆ ಮುಗಿಬಿದ್ದ ವಿಪಕ್ಷಗಳು!

Published

on

ಭಾರತೀಯ ಚುನಾವಣಾ ಆಯೋಗದ (ECI) ಇತಿಹಾಸದಲ್ಲಿ ಅಭೂತಪೂರ್ವ ಬೆಳವಣಿಗೆಯೊಂದು ನಡೆದಿದ್ದು, ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆ ಹಾಗೂ ಆಯೋಗದೊಳಗಿನ ಆಂತರಿಕ ಭಿನ್ನಮತದ ಬೆನ್ನಲ್ಲೇ, ನವದೆಹಲಿಯಲ್ಲಿ ನಡೆದ ಕಾಕ್ರೋಚ್ ಜನತಾ ಪಾರ್ಟಿ (CJP) ಪತ್ರಿಕಾಗೋಷ್ಠಿ ಮತ್ತು 48 ಗಂಟೆಗಳ ಅಲ್ಟಿಮೇಟಂ ದೇಶಾದ್ಯಂತ ರಾಜಕೀಯ ಹಾಗೂ ಕಾನೂನು ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದೆ.

CJP ಪತ್ರಿಕಾಗೋಷ್ಠಿ ಮತ್ತು ಸಿಇಸಿಗೆ 48 ಗಂಟೆಗಳ ಡೆಡ್‌ಲೈನ್

ಆಯೋಗದ ಆಂತರಿಕ ಬಿಕ್ಕಟ್ಟನ್ನು ಮುಂದಿಟ್ಟುಕೊಂಡು ನವದೆಹಲಿಯಲ್ಲಿ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಸಂಸ್ಥಾಪಕ ಅಭಿಜಿತ್ ದೀಪ್ಕೆ ಮತ್ತು ಮುಖ್ಯ ವಕ್ತಾರ ಸೌರವ್ ದಾಸ್ ತುರ್ತು ಪತ್ರಿಕಾಗೋಷ್ಠಿ ನಡೆಸಿದ್ದಾರೆ. ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಅವರಿಗೆ 48 ಗಂಟೆಗಳ ಗಡುವು ನೀಡಿರುವ CJP, ಮೂರು ಪ್ರಮುಖ ಬೇಡಿಕೆಗಳನ್ನು ಮಂಡಿಸಿದೆ. ಸಿಇಸಿ ತಕ್ಷಣ ರಾಜೀನಾಮೆ ನೀಡಬೇಕು ಮತ್ತು ಇದರ ಹಿಂದೆ ಕಾರ್ಯಾಂಗದ ಹಸ್ತಕ್ಷೇಪವಿದ್ದು ಕ್ರಿಮಿನಲ್ ತನಿಖೆ ಆರಂಭಿಸಬೇಕು ಎಂದು ಒತ್ತಾಯಿಸಲಾಗಿದೆ. ನಾಳೆ ದಾಖಲೆಗಳು ನಾಶವಾಗುವುದನ್ನು ತಡೆಯಲು ಸುಪ್ರೀಂ ಕೋರ್ಟ್ SIR ನ ಎಲ್ಲಾ ಮೂಲ ಫೈಲ್‌ಗಳನ್ನು ತನ್ನ ವಶಕ್ಕೆ ಪಡೆದು, ಸ್ವತಂತ್ರ ತನಿಖಾ ಆಯೋಗ ರಚಿಸಬೇಕು ಹಾಗೂ ಜನವರಿ 2025ರ ಪೂರ್ವದ ಮತದಾರರ ಪಟ್ಟಿಯನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸಲಾಗಿದೆ. ಜೊತೆಗೆ, ಮುಖ್ಯ ನ್ಯಾಯಮೂರ್ತಿ (CJI) ಅವರನ್ನು ಆಯ್ಕೆ ಸಮಿತಿಯಿಂದ ಹೊರಗಿಡುವ 2023ರ ಕಾಯ್ದೆಯನ್ನು ರದ್ದುಪಡಿಸಿ ಪಾರದರ್ಶಕ ನೇಮಕಾತಿ ವ್ಯವಸ್ಥೆ ತರಬೇಕು ಎಂದು ಆಗ್ರಹಿಸಿದ್ದು, ಒಂದು ವೇಳೆ ಈ ಬೇಡಿಕೆಗಳು ಈಡೇರದಿದ್ದರೆ ದೇಶಾದ್ಯಂತ ವಿದ್ಯಾರ್ಥಿಗಳು ಮತ್ತು ಜನಸಾಮಾನ್ಯರನ್ನು ಒಗ್ಗೂಡಿಸಿ ಪ್ರಜಾಪ್ರಭುತ್ವ ರಕ್ಷಣಾ ಚಳವಳಿ ನಡೆಸುವುದಾಗಿ ಸೌರವ್ ದಾಸ್ ಎಚ್ಚರಿಕೆ ನೀಡಿದ್ದಾರೆ.

ವಿವಾದದ ಕೇಂದ್ರಬಿಂದು: SIR ಮತ್ತು ಆಂತರಿಕ 14 ಆಕ್ಷೇಪಗಳು

CJP ಈ ಕಠಿಣ ನಿಲುವು ತಾಳಲು ಚುನಾವಣಾ ಆಯೋಗದೊಳಗೆ ನಡೆದಿರುವ ಬೆಳವಣಿಗೆಗಳೇ ಮುಖ್ಯ ಕಾರಣವಾಗಿವೆ. 2025ರ ಅಕ್ಟೋಬರ್ 27ರಂದು ಜ್ಞಾನೇಶ್ ಕುಮಾರ್ ನೇತೃತ್ವದಲ್ಲಿ 22 ವರ್ಷಗಳ ನಂತರದ ಅತಿದೊಡ್ಡ ಮತದಾರರ ಪಟ್ಟಿ ಶುದ್ಧೀಕರಣ ಕಾರ್ಯಾಚರಣೆಯಾದ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಘೋಷಿಸಲಾಗಿತ್ತು. ಆದರೆ ಕೋಟ್ಯಂತರ ಮತದಾರರ ಹೆಸರುಗಳನ್ನು ಅನ್ಯಾಯವಾಗಿ ಕೈಬಿಡಲಾಗಿದೆ ಎಂಬ ಆರೋಪ ಕೇಳಿಬಂತು. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿಯ ಪ್ರಕಾರ, ಚುನಾವಣಾ ಆಯುಕ್ತರಾದ ಸುಖ್ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ಕಳೆದ 10 ತಿಂಗಳುಗಳಲ್ಲಿ ಸುಮಾರು 14 ಬಾರಿ ಅಧಿಕೃತವಾಗಿ ಆಕ್ಷೇಪಣೆ ಸಲ್ಲಿಸಿದ್ದಾರೆ. ಫಾರ್ಮ್ 6 ತಿದ್ದುಪಡಿ, ರೋಲ್ ಸಾಫ್ಟ್‌ವೇರ್ ಮತ್ತು ಡೇಟಾಬೇಸ್ ಕೇಂದ್ರೀಕರಣದಂತಹ ವಿಚಾರಗಳಲ್ಲಿ ತಮಗೆ ತಿಳಿಸದೆ ಆದೇಶ ಹೊರಡಿಸಲಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದ್ದರು. ಆದರೆ ಈ ಆಂತರಿಕ ಅಶಾಂತಿಯ ವರದಿಗಳನ್ನು ECI ತಳ್ಳಿಹಾಕಿದ್ದು, ಭಿನ್ನ ಅಭಿಪ್ರಾಯಗಳು ಸಹಜವಾದರೂ SIR ಸೇರಿದಂತೆ ಎಲ್ಲಾ ನಿರ್ಧಾರಗಳು ಸರ್ವಾನುಮತದಿಂದ ಆಗಿವೆ ಎಂದು ಸ್ಪಷ್ಟಪಡಿಸಿದೆ.

ರಾಜಕೀಯ ಪ್ರತಿಕ್ರಿಯೆ ಮತ್ತು ವಿಪಕ್ಷಗಳ ಆಕ್ರೋಶ

CJP ಅಲ್ಟಿಮೇಟಂ ಮತ್ತು ಆಂತರಿಕ ಭಿನ್ನಮತದ ವರದಿಗಳು ಹೊರಬರುತ್ತಿದ್ದಂತೆ ವಿಪಕ್ಷಗಳು ಸರ್ಕಾರದ ವಿರುದ್ಧ ಮುಗಿಬಿದ್ದಿವೆ. ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಅಖಿಲೇಶ್ ಯಾದವ್, ಮಮತಾ ಬ್ಯಾನರ್ಜಿ ಮತ್ತು ಸಂಜಯ್ ರಾವತ್ ಸೇರಿದಂತೆ ಪ್ರಮುಖ ನಾಯಕರು ಸಿಇಸಿ ರಾಜೀನಾಮೆಗೆ ಪಟ್ಟು ಹಿಡಿದ್ದಾರೆ. ಅಖಿಲೇಶ್ ಯಾದವ್ ಅವರು “14 ಬಾರಿ ಆಕ್ಷೇಪಣೆ” ವರದಿಯನ್ನು ಉಲ್ಲೇಖಿಸಿ ಚುನಾವಣಾ ಆಯೋಗದ ಕಾರ್ಯವೈಖರಿಯನ್ನು ತೀವ್ರವಾಗಿ ಪ್ರಶ್ನಿಸಿದ್ದಾರೆ. ವಿಪಕ್ಷಗಳು ಈ ಬೆಳವಣಿಗೆಯನ್ನು ಪ್ರಜಾಪ್ರಭುತ್ವದ ಮೇಲಿನ ನೇರ ದಾಳಿ ಎಂದು ಬಣ್ಣಿಸಿವೆ.

ನ್ಯಾಯಾಂಗದ ನಡೆ: ಸುಪ್ರೀಂ ಕೋರ್ಟ್ ದ್ವಿಮುಖ ನಿಲುವು

ಮತ್ತೊಂದೆಡೆ ಸುಪ್ರೀಂ ಕೋರ್ಟ್ SIR ಪ್ರಕ್ರಿಯೆಯ ಕಾನೂನುಬದ್ಧತೆಯನ್ನು ಎತ್ತಿಹಿಡಿದಿದೆ. ಇದಕ್ಕೆ ಪ್ರತಿಕ್ರಿಯಿಸಿರುವ ಸಿಇಸಿ, 2029ರ ಚುನಾವಣೆಗೂ ಮುನ್ನ ಹೆಸರು ಕೈಬಿಟ್ಟ ದೂರುಗಳನ್ನು ನೂರಕ್ಕೆ ನೂರರಷ್ಟು ಬಗೆಹರಿಸಲಾಗುವುದು ಎಂದಿದ್ದಾರೆ. ಆದರೆ ಅದೇ ಸಮಯದಲ್ಲಿ, ಆಯ್ಕೆ ಸಮಿತಿಯಿಂದ CJI ಅವರನ್ನು ಹೊರಗಿಟ್ಟಿರುವ 2023ರ ಕಾಯ್ದೆಯ ಸಿಂಧುತ್ವವನ್ನು ಸುಪ್ರೀಂ ಕೋರ್ಟ್ ತೀವ್ರವಾಗಿ ಪ್ರಶ್ನಿಸಿದೆ. ಈ ವಿಚಾರವನ್ನು ದೊಡ್ಡ ಸಂವಿಧಾನ ಪೀಠಕ್ಕೆ ವರ್ಗಾಯಿಸಲು ಒಪ್ಪಿಗೆ ಸೂಚಿಸಲಾಗಿದ್ದು, ಈ ಕಾಯ್ದೆಯ ಭವಿಷ್ಯದ ಮೇಲೆ ಇಡೀ ಆಯೋಗದ ಸ್ವಾಯತ್ತತೆ ನಿಂತಿದೆ.

CJP ನೀಡಿದ 48 ಗಂಟೆಗಳ ಅಲ್ಟಿಮೇಟಂಗೆ ನೇರ ಸಾಂವಿಧಾನಿಕ ಮಾನ್ಯತೆ ಇಲ್ಲದಿದ್ದರೂ, ಇದು ವಿಪಕ್ಷಗಳ “ಮತ ಕಳ್ಳತನ” ಆರೋಪಗಳಿಗೆ ದೊಡ್ಡ ಮಟ್ಟದ ಇಂಧನ ನೀಡಿದೆ. ಸದ್ಯ ಈ ಸಂಪೂರ್ಣ ಬಿಕ್ಕಟ್ಟು ECIಯ ಸ್ವಾಯತ್ತತೆ ಮತ್ತು 2023ರ ಕಾಯ್ದೆಯ ಸಾಂವಿಧಾನಿಕ ಸಿಂಧುತ್ವದ ಮೇಲಿನ ಸುಪ್ರೀಂ ಕೋರ್ಟ್ ತೀರ್ಪಿನತ್ತ ಎಲ್ಲರ ಚಿತ್ತ ನೆಡುವಂತೆ ಮಾಡಿದೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Article

ಕರಾವಳಿ ರಾಜಕೀಯದ ಹೊಸ ಸಂಚಲನ – ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಯಾರು ? ಆಡಿಯೋ ವಿವಾದ ಮತ್ತು ಪರಿವಾರದ ಹಿನ್ನೆಲೆ

Published

on

ಕಲ್ಲಡ್ಕ ಪ್ರಭಾಕರ ಭಟ್‌ ಧರ್ಮಸ್ಥಳದ ಸೌಜನ್ಯ ಕೊಲೆ ಪ್ರಕರಣದಲ್ಲಿ ನ್ಯಾಯ ಸಿಕ್ಕೇ ಸಿಗುತ್ತದೆ ಎಂದು ಹೇಳಿಕೆ ನೀಡಿದ ಬೆನ್ನಲ್ಲೇ ಕೆಲದಿನಗಳ ಹಿಂದೆ ಸೌಜನ್ಯ ಮನೆ ಮತ್ತು ತಿಮರೋಡಿ ಮನೆಗೆ ಭೇಟಿ ನೀಡಿ ಸೌಜನ್ಯ ಹೋರಾಟಕ್ಕೆ ಧ್ವನಿಯೆತ್ತಿ ಬೆಂಬಲ ಘೋಷಿಸಿದ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ
ಮಂಗಳೂರು: ಕರ್ನಾಟಕದ ಕರಾವಳಿ ರಾಜಕೀಯ ವಲಯದಲ್ಲಿ ಇತ್ತೀಚೆಗೆ ಸಂಘ ಪರಿವಾರದ ಪ್ರಮುಖ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರ ವೈರಲ್ ಆಡಿಯೋ ಒಂದು ತೀವ್ರ ಚರ್ಚೆಗೆ ಹಾಗೂ ರಾಜಕೀಯ ವಲಯದಲ್ಲಿ ಭಾರೀ ಬಿರುಸಿಗೆ ಕಾರಣವಾಗಿದೆ. ಬಂಟ್ವಾಳದಲ್ಲಿ ಹಿಂದುತ್ವ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ವಿಎಚ್‌ಪಿ ಮತ್ತು ಬಜರಂಗದಳದಿಂದ ನಡೆದ ಪ್ರತಿಭಟನಾ ಸಭೆಯು ಈ ಎಲ್ಲಾ ಬೆಳವಣಿಗೆಗಳಿಗೆ ನಾಂದಿ ಹಾಡಿತು. ಈ ಹಿನ್ನೆಲೆಯಲ್ಲಿ, ಕರಾವಳಿ ರಾಜಕೀಯದ ಪ್ರಮುಖ ಮುಖಂಡರಾಗಿರುವ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರ ರಾಜಕೀಯ ಮತ್ತು ಸಾಂಸ್ಥಿಕ ಹಿನ್ನೆಲೆ ಏನು, ಈ ವಿವಾದ ಸೃಷ್ಟಿಯಾಗಲು ಕಾರಣವಾದ ಅಂಶಗಳೇನು ಮತ್ತು ಪಕ್ಷದ ಹಿತದೃಷ್ಟಿಯಿಂದ ಅವರು ಎತ್ತಿರುವ ಗಂಭೀರ ಪ್ರಶ್ನೆಗಳೇನು ? ಅವರು ಪ್ರಶ್ನಿಸಲು ಸಮರ್ಥರೇ ? ಪಕ್ಷದಲ್ಲಿ ಅವರು ಏನು ? ಎಂಬ ಸಂಪೂರ್ಣ ನೋಟ ಇಲ್ಲಿದೆ.

ಈ ವಿವಾದದ ಕೇಂದ್ರಬಿಂದುವಾಗಿರುವ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರು ಪಕ್ಷ ಹಾಗೂ ಸಂಘ ಪರಿವಾರಕ್ಕಾಗಿ ಮೂರು ದಶಕಗಳಿಗೂ ಅಧಿಕ ಕಾಲದಿಂದ ಪ್ರಾಮಾಣಿಕವಾಗಿ ಶ್ರಮಿಸಿರುವ ಧೀಮಂತ ವ್ಯಕ್ತಿಯಾಗಿದ್ದಾರೆ. 1989ರಲ್ಲಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ (RSS) ಶಾಖಾ ಶಿಕ್ಷಕರಾಗಿ ತಮ್ಮ ಸಾರ್ವಜನಿಕ ಬದುಕನ್ನು ಆರಂಭಿಸಿದ ಇವರು, 1990ರ ಅಯೋಧ್ಯೆ ರಾಮಜನ್ಮ ಭೂಮಿ ಮುಕ್ತಿ ಹೋರಾಟದಲ್ಲಿ ಸಕ್ರಿಯವಾಗಿ ಭಾಗವಹಿಸಿ ಉತ್ತರ ಪ್ರದೇಶದಲ್ಲಿ 15 ದಿನಗಳ ಕಾಲ ಜೈಲು ವಾಸವನ್ನೂ ಅನುಭವಿಸಿದ್ದಾರೆ. 1991-92ರಲ್ಲಿ ಕುರ್ನಾಡು ಮಂಡಲದಲ್ಲಿ ಸಂಘದ ವಿಸ್ತಾರಕನಾಗಿ, 1992ರ ಅಯೋಧ್ಯೆ ಕರಸೇವೆಯಲ್ಲಿ, ಮತ್ತು 1992-93ರಲ್ಲಿ ಹಿಂದೂ ಜಾಗರಣಾ ವೇದಿಕೆಯ ಗೋಳ್ತಮಜಲು ಮಂಡಲ ಸಂಚಾಲಕರಾಗಿ ಸೇವೆ ಸಲ್ಲಿಸಿದ್ದಾರೆ. ಹಾಗೆಯೇ 1993-94ರಲ್ಲಿ ಬಾಳ್ತಿಲ ಗ್ರಾಮ ಬಿಜೆಪಿ ಸಮಿತಿ ಪ್ರಧಾನ ಕಾರ್ಯದರ್ಶಿಯಾಗಿ ಹಾಗೂ ಗ್ರಾಮ ಪಂಚಾಯತ್ ಚುನಾಯಿತ ಸದಸ್ಯರಾಗಿಯೂ, 2022ರಿಂದ 3 ವರ್ಷಗಳ ಕಾಲ ಕೇಂದ್ರ ಸರಕಾರದ ದಿಶಾ ಸಮಿತಿಯ ಸದಸ್ಯರಾಗಿಯೂ ಜನ ಸೇವೆಗೈದಿದ್ದಾರೆ.

ಮಾಜಿ ಶಾಸಕ ರುಕ್ಮಯ ಪೂಜಾರಿ, ಹಿಂದೂ ಜಾಗರಣ ವೇದಿಕೆಯ ಪ್ರಮುಖರಾಗಿದ್ದ ರಾಧಕೃಷ್ಣ ಅಡ್ಯಂತಾಯರು, ದಿವಂಗತ ಕಲ್ಲಡ್ಕ ರಾಮಪ್ಪ ಪೂಜಾರಿ ಏಳ್ತಿಮಾರ್‌, ಮಾಜಿ ಶಾಸಕರಾದ ಪದ್ಮನಾಭ ಕೊಟ್ಟಾರಿ ಸೇರಿದಂತೆ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ಅವರವರೆಗಿನ ಎಲ್ಲರ ನೇತೃತ್ವದಲ್ಲಿ ಎಲ್ಲಾ ವಿಧಾನಸಭಾ ಹಾಗೂ ಲೋಕಸಭಾ ಚುನಾವಣೆಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿರುವ ಇವರು, ಜಿಲ್ಲಾ ಬಿಜೆಪಿ ಕಾರ್ಯಕಾರಿಣಿ ಸದಸ್ಯರಾಗಿ, ಹಿಂದುಳಿದ ವರ್ಗಗಳ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ಮತ್ತು ಧರ್ಮಸ್ಥಳ ಕನ್ಯಾಡಿಯ ಶ್ರೀರಾಮ ಕ್ಷೇತ್ರ ಮಹಾ ಸಂಸ್ಥಾನದ ಸಂಚಾಲಕರಾಗಿ ದೀರ್ಘಕಾಲದಿಂದ ಗುರುತಿಸಿಕೊಂಡಿದ್ದಾರೆ. ಆರ್‌ಎಸ್‌ಎಸ್ ಪ್ರಮುಖರಾದ ಕಲ್ಲಡ್ಕ ಪ್ರಭಾಕರ ಭಟ್ ಅವರ ಅನುಯಾಯಿಯಾಗಿರುವ ಇವರು, ನೇರ ನಡೆನುಡಿಗೆ ಹೆಸರಾಗಿದ್ದಾರೆ.

ಈ ವಿವಾದ ಪ್ರಸ್ತಾವವಾಗಲು ಮತ್ತು ಕಲ್ಲಡ್ಕ ಅವರ ಆಡಿಯೋ ವೈರಲ್ ಆಗಲು ಬಂಟ್ವಾಳದಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ನಡೆದ ಆಡಳಿತಾತ್ಮಕ ಮತ್ತು ಸಾಂಸ್ಥಿಕ ಬೆಳವಣಿಗೆಗಳೇ ಪ್ರಮುಖ ಕಾರಣವಾಗಿವೆ. ಸದರಿ ಸಭೆಯಲ್ಲಿ ಭಾಗವಹಿಸಿದ್ದ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಅವರು, “ಕರಾವಳಿ ತೀರದವರು ಅವಲಕ್ಕಿ ಪ್ರಿಯರು. ನಮ್ಮ ಬಾಯಲ್ಲಿ ಅವಲಕ್ಕಿ ಇಟ್ಟಂತೆ ನಮ್ಮ ಶಾಸಕರು ಮತ್ತು ಸಂಸದರೂ ಬಾಯಲ್ಲಿ ಅವಲಕ್ಕಿ ತುಂಬಿಕೊಂಡಿದ್ದಾರೆ” ಎಂದು ಸ್ಥಳೀಯ ಜನಪ್ರತಿನಿಧಿಗಳನ್ನು ಕಟುವಾಗಿ ಟೀಕಿಸಿದ್ದರು. ಕರಾವಳಿ ಭಾಗದ ನಾಯಕರ ವಿರುದ್ಧ ಹೊರಗಿನಿಂದ ಬಂದು ಪಾಠ ಮಾಡುವುದನ್ನು ಖಂಡಿಸಿದ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ, ಇಷ್ಟು ವರ್ಷಗಳಿಂದ ಸಂಘಪರಿವಾರಕ್ಕಾಗಿ ದುಡಿದ ನಳಿನ್ ಕುಮಾರ್ ಕಟೀಲ್, ಸತ್ಯಜಿತ್ ಹಾಗೂ ಅರುಣ್ ಕುಮಾರ್ ಪುತ್ತಿಲರಂತಹ ನಾಯಕರನ್ನು ಕಡೆಗಣಿಸುತ್ತಿರುವುದನ್ನು ಪ್ರಶ್ನಿಸಿದ್ದರು. ಮುಂದುವರಿದು, ಕಲ್ಲಡ್ಕ ಪ್ರಭಾಕರ ಭಟ್‌ ಸೌಜನ್ಯ ಪ್ರಕರಣದಲ್ಲಿ ನ್ಯಾಯ ಸಿಗುವಂತೆ ಅಗ್ರಹ ಮಾಡಿದ ಬೆನ್ನಲ್ಲೇ ಕೆಲದಿನಗಳ ಹಿಂದೆ ಧರ್ಮಸ್ಥಳದ ಕುಮಾರಿ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸೌಜನ್ಯ ಅವರ ಮನೆ ಹಾಗೂ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಅವರ ಮನೆಗೆ ದಿಢೀರ್ ಭೇಟಿ ನೀಡಿ ನ್ಯಾಯದ ಹೋರಾಟಕ್ಕೆ ಸಂಪೂರ್ಣ ಬೆಂಬಲ ಘೋಷಿಸಿದ್ದು ರಾಜಕೀಯ ವಲಯದಲ್ಲಿ ಭಾರೀ ಸಂಚಲನ ಮೂಡಿಸಿತ್ತು.

ಈ ಎಲ್ಲಾ ಬೆಳವಣಿಗೆಗಳ ಮುಂದುವರಿದ ಭಾಗವಾಗಿ, ಪಕ್ಷದ ಹಿತದೃಷ್ಟಿಯನ್ನು ಗಮನದಲ್ಲಿಟ್ಟುಕೊಂಡು ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರು ವೈರಲ್ ಆಗಿರುವ ಆಡಿಯೋ ಮೂಲಕ ಕಠಿಣ ಸಂದೇಶವನ್ನು ರವಾನಿಸಿದ್ದಾರೆ. ಕರಾವಳಿ ನಾಯಕರನ್ನು ಹಗುರವಾಗಿ ಮಾತನಾಡಿರುವ ಬಗ್ಗೆ ನನಗೆ ನೋವಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ಪಕ್ಷದ ಆಂತರಿಕ ವಿಚಾರಗಳಲ್ಲಿ ಏನೇ ಸಮಸ್ಯೆಗಳಿದ್ದರೂ ಮುಖಂಡರ ಮೂಲಕ ಬಗೆಹರಿಸಿ ಪಕ್ಷಕ್ಕೆ ಯಾವುದೇ ರೀತಿಯ ಡ್ಯಾಮೇಜ್ ಆಗದಂತೆ ನೋಡಿಕೊಂಡಿರುವ ಕಲ್ಲಡ್ಕ ಅವರ ಈ ನೇರ ಎಚ್ಚರಿಕೆಯು, ಕರಾವಳಿ ಬಿಜೆಪಿಯಲ್ಲಿ ತಳಮಟ್ಟದ ಕಾರ್ಯಕರ್ತರ ಧ್ವನಿಯನ್ನು ಹತ್ತಿಕ್ಕುವ ಮತ್ತು ಹೊರಗಿನವರ ಹಸ್ತಕ್ಷೇಪವನ್ನು ಸಹಿಸದ ಆಕ್ರೋಶದ ಪ್ರತಿಬಿಂಬವಾಗಿದೆ ಎಂದು ರಾಜಕೀಯ ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Continue Reading

accident

ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಪ್ರಯಾಣಿಸುತ್ತಿದ್ದ ಕಾರು ಅಪಘಾತ – ಪ್ರಾಣಾಪಾಯದಿಂದ ಪಾರು

Published

on

ಸುಳ್ಯ: ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾದ ಘಟನೆ ನಡೆದಿದೆ.

ಕರಿಕ್ಕಳ – ನಿಂತಿಕಲ್ ಮಧ್ಯೆ ಮುಚ್ಚಿಲ ಎಂಬಲ್ಲಿ ಈ ಅಪಘಾತ ಸಂಭವಿಸಿದೆ ಎಂದು ತಿಳಿದುಬಂದಿದೆ. ಎದುರಿನಿಂದ ಹೋಗುತ್ತಿದ್ದ ಕಾರು ಸಡನ್ನಾಗಿ ಬ್ರೇಕ್‌ ಹಾಕಿದ ಪರಿಣಾಮ ಶಾಸಕರ ಕಾರು ಅದಕ್ಕೆ ಡಿಕ್ಕಿ ಹೊಡೆದಿದೆಯೆನ್ನಲಾಗಿದೆ.

ಅಪಘಾತದ ವಿವರ:
ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಯಾಣಿಸುತ್ತಿದ್ದ ಇನ್ನೋವಾ ಕಾರು ಅಪಘಾತಕ್ಕೀಡಾಗಿದ್ದು, ಅದೃಷ್ಟವಶಾತ್ ಶಾಸಕಿ ಭಾಗೀರಥಿ ಮುರುಳ್ಯ ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ ಎಂದು ಪ್ರಾಥಮಿಕ ಮಾಹಿತಿ ಲಭ್ಯವಾಗಿದೆ.

ಕಾರು ಜಖಂಗೊಂಡಿದ್ದು, ಹೆಚ್ಚಿನ ವಿವರ ನಿರೀಕ್ಷಿಸಲಾಗುತ್ತಿದೆ. ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು.

Continue Reading

BJP

ಫಾರ್ಮ್ 6ರ ಮೇಲಿನ ಹೆಚ್ಚುವರಿ ಡಿಕ್ಲರೇಷನ್ ವಾಪಸ್: ಚುನಾವಣಾ ಆಯೋಗದಿಂದ ಭಾಗಶಃ ಹಿಮ್ಮುಖ ಹೆಜ್ಜೆ

Published

on

ನವದೆಹಲಿ: ಮತದಾರರ ಪಟ್ಟಿ ಪರಿಷ್ಕರಣಾ ಪ್ರಕ್ರಿಯೆ ಪೂರ್ಣಗೊಂಡಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಆನ್‌ಲೈನ್ ಫಾರ್ಮ್ 6 ಅರ್ಜಿಯೊಂದಿಗೆ ಲಗತ್ತಿಸಲಾಗಿದ್ದ ಹೆಚ್ಚುವರಿ ವಿಶೇಷ ತೀವ್ರ ಪರಿಷ್ಕರಣೆ ಘೋಷಣೆಯನ್ನು ಭಾರತೀಯ ಚುನಾವಣಾ ಆಯೋಗವು ಹಿಂಪಡೆದಿದೆ. ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪೂರ್ಣಗೊಂಡಿರುವ ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಲ್ಲಿ, ಆನ್‌ಲೈನ್ ‘ಫಾರ್ಮ್ 6’ ಅರ್ಜಿಯೊಂದಿಗೆ ಲಗತ್ತಿಸಲಾಗಿದ್ದ ಹೆಚ್ಚುವರಿ ಘೋಷಣಾ ಪತ್ರದ (Additional Declaration) ಕಡ್ಡಾಯ ನಿಯಮವನ್ನು ಭಾರತೀಯ ಚುನಾವಣಾ ಆಯೋಗವು (ECI) ಹಿಂಪಡೆದಿದೆ.

‘ದಿ ಹಿಂದೂ’ ಪತ್ರಿಕೆಯ ವಿಶೇಷ ವರದಿಯ ಪ್ರಕಾರ, ಸಾರ್ವಜನಿಕವಾಗಿ ಮತ್ತು ಕಾನೂನಾತ್ಮಕವಾಗಿ ವ್ಯಾಪಕ ಆಕ್ಷೇಪ ವ್ಯಕ್ತವಾದ ಬೆನ್ನಲ್ಲೇ, ಆಯೋಗವು ಸೆಪ್ಟೆಂಬರ್ 29ರಂದು ತನ್ನ ತಂತ್ರಾಂಶದಿಂದ ಪೋಷಕರ ಮತ್ತು ವಂಶಾವಳಿ ವಿವರ ಕೇಳುವ ಕಾಲಮ್‌ಗಳನ್ನು ಸದ್ದಿಲ್ಲದೆ ತೆಗೆದುಹಾಕಿದೆ. ಇದರಿಂದಾಗಿ, ಎಸ್‌ಐಆರ್ ಮುಗಿದಿರುವ ಪ್ರದೇಶಗಳ ಹೊಸ ಅರ್ಜಿದಾರರು ಇನ್ನುಮುಂದೆ ‘ಮತದಾರರ ನೋಂದಣಿ ನಿಯಮಗಳು-1960’ರ ಅಡಿ ನಿಗದಿಪಡಿಸಲಾದ ಕಡ್ಡಾಯ ನಮೂನೆ-6ನ್ನು ಮಾತ್ರ ಭರ್ತಿ ಮಾಡಿದರೆ ಸಾಕು.

ವಿವಾದಕ್ಕೆ ಕಾರಣವೇನು? ಕೇಂದ್ರ ಸರ್ಕಾರದ ಅಧಿಸೂಚನೆ ಅಥವಾ ಸಂಸತ್ತಿನ ಪರಾಮರ್ಶೆ ಇಲ್ಲದೆ, ಚುನಾವಣಾ ಆಯೋಗವು ತನ್ನ ‘ಇಸಿಐನೆಟ್’ (ECINET) ತಂತ್ರಾಂಶದ ಮೂಲಕ ‘ಫಾರ್ಮ್ 6’ ಜೊತೆ ಪೋಷಕರ ಹಳೆಯ ಮತದಾರರ ವಿವರಗಳ ಮ್ಯಾಪಿಂಗ್ ಡಿಕ್ಲರೇಷನ್ ಅನ್ನು ಏಕಪಕ್ಷೀಯವಾಗಿ ಸೇರ್ಪಡೆಗೊಳಿಸಿತ್ತು. 1960ರ ನಿಯಮಾವಳಿ ತಿದ್ದುಪಡಿ ಮಾಡುವ ಅಧಿಕಾರ ಕೇವಲ ಕೇಂದ್ರ ಸರ್ಕಾರಕ್ಕೆ ಮಾತ್ರ ಇದ್ದು, ಆಯೋಗವು ಕಾನೂನಿನ ಚೌಕಟ್ಟು ಮೀರಿ ನಡೆದುಕೊಂಡಿದೆ ಎಂಬ ಗಂಭೀರ ಆರೋಪಗಳು ಕೇಳಿಬಂದಿದ್ದವು.

ಖುದ್ದು ಚುನಾವಣಾ ಆಯುಕ್ತರಾದ ಡಾ. ಸುಖ್‌ಬೀರ್ ಸಿಂಗ್ ಸಂಧು ಮತ್ತು ಡಾ. ವಿವೇಕ್ ಜೋಶಿ ಅವರೇ ಈ ಅನಧಿಕೃತ ಬದಲಾವಣೆಯನ್ನು ವಿರೋಧಿಸಿ ಆಂತರಿಕವಾಗಿ ಆಕ್ಷೇಪ ವ್ಯಕ್ತಪಡಿಸಿದ್ದರು. ಈ ತಾಂತ್ರಿಕ ನಿಯಮವು ಹೊಸ ಮತದಾರರು, ಗ್ರಾಮೀಣ ಭಾಗದ ನಾಗರಿಕರು ಹಾಗೂ ವಲಸೆ ಕಾರ್ಮಿಕರಿಗೆ ಮತದಾನದ ಹಕ್ಕು ಪಡೆಯಲು ದೊಡ್ಡ ಅಡೆತಡೆಯಾಗಿ ಪರಿಣಮಿಸಿತ್ತು.

ಮುಂದುವರಿದ ಆತಂಕ: ಆಯೋಗವು ಎಸ್‌ಐಆರ್ ಪೂರ್ಣಗೊಂಡಿರುವ ರಾಜ್ಯಗಳಲ್ಲಿ ಈ ನಿಯಮವನ್ನು ಸಡಿಲಗೊಳಿಸಿದ್ದರೂ, ಪ್ರಸ್ತುತ ಎಸ್‌ಐಆರ್ ಪ್ರಕ್ರಿಯೆ ಪ್ರಗತಿಯಲ್ಲಿರುವ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಮಾತ್ರ ಈ ಹೆಚ್ಚುವರಿ ಘೋಷಣಾಪತ್ರದ ನಿಯಮವನ್ನು ಇಂದಿಗೂ ಮುಂದುವರಿಸಲಾಗಿದೆ. ಇದರಿಂದ ಆ ಪ್ರದೇಶಗಳ ಅರ್ಹ ಮತದಾರರು ಇಂದಿಗೂ ತಾಂತ್ರಿಕ ಕಿರುಕುಳ ಹಾಗೂ ಹಕ್ಕು ವಂಚಿತರಾಗುವ ಆತಂಕವನ್ನು ಎದುರಿಸುತ್ತಿದ್ದಾರೆ. ನಾಗರಿಕ ಸಮಾಜದ ನಿರಂತರ ವಿರೋಧಕ್ಕೆ ಇದು ಭಾಗಶಃ ಸಿಕ್ಕ ಜಯವಾಗಿದ್ದರೂ, ಸಂಪೂರ್ಣ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಕಾಯ್ದುಕೊಳ್ಳುವ ಬಗ್ಗೆ ಗಂಭೀರ ಪ್ರಶ್ನೆಗಳು ಹಾಗೆಯೇ ಉಳಿದಿವೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!