Connect with us

BJP

ಮಂಗಳೂರಿನಲ್ಲಿ ಬಿಜೆಪಿ–ಕಾಂಗ್ರೆಸ್ ಪ್ರತ್ಯೇಕ ಪ್ರತಿಭಟನೆ: ‘ವೋಟ್ ಚೋರಿ’ ವಿರುದ್ಧ ಕಾಂಗ್ರೆಸ್ ಆಕ್ರೋಶ; ಬೆಲೆ ಏರಿಕೆ ವಿರುದ್ಧ ಕಮಲ ಪಡೆ ಕಿಡಿ!

Published

on

ಎಸ್‌ಐಆರ್ ಮೂಲಕ ಮತ ಕಳ್ಳತನದ ಹಾದಿ ಜಗಜ್ಜಾಹೀರು: ರಮಾನಾಥ ರೈ | ಬಸ್ ದರ, ಹಾಲಿನ ಬೆಲೆ ಏರಿಕೆ ಹಿಂಪಡೆಯಲು ಬಿಜೆಪಿ ಆಗ್ರಹ

ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಗುರುವಾರ ರಾಜಕೀಯ ಪ್ರತಿಭಟನೆಗಳ ಕಾವು ಜೋರಾಗಿತ್ತು. ಒಂದೆಡೆ ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆ ಹಾಗೂ ಮತದಾನದ ಹಕ್ಕಿನ ರಕ್ಷಣೆ ಹೆಸರಿನಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿ ‘ವೋಟ್ ಬಚಾವೋ–ದೇಶ್ ಬಚಾವೋ’ ಜನಾಂದೋಲನದಡಿ ಪ್ರತಿಭಟನೆ ನಡೆಸಿದರೆ, ಮತ್ತೊಂದೆಡೆ ರಾಜ್ಯ ಸರ್ಕಾರದ ಬಸ್ ಪ್ರಯಾಣ ದರ ಮತ್ತು ಹಾಲಿನ ಬೆಲೆ ಏರಿಕೆ ಖಂಡಿಸಿ ಬಿಜೆಪಿ ಕಾರ್ಯಕರ್ತರು ಬೀದಿಗಿಳಿದರು. ನಗರದ ಎರಡು ಪ್ರತ್ಯೇಕ ಸ್ಥಳಗಳಲ್ಲಿ ನಡೆದ ಪ್ರತಿಭಟನೆಗಳಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಾಯಕರು ಪರಸ್ಪರ ಆರೋಪಗಳ ಸುರಿಮಳೆಗೈದರು.

ಎಸ್‌ಐಆರ್ ಮೂಲಕ ಮತ ಕಳ್ಳತನದ ಹಾದಿ ಜಗಜ್ಜಾಹೀರು: ರಮಾನಾಥ ರೈ

ಪ್ರಜಾಪ್ರಭುತ್ವದ ಮೌಲ್ಯಗಳ ಸಂರಕ್ಷಣೆ ಉದ್ದೇಶದಿಂದ ಅಖಿಲ ಭಾರತ ಕಾಂಗ್ರೆಸ್ ಸಮಿತಿ ದೇಶವ್ಯಾಪಿ ಹಮ್ಮಿಕೊಂಡಿರುವ ‘ವೋಟ್ ಬಚಾವೋ–ದೇಶ್ ಬಚಾವೋ’ ಬೃಹತ್ ಜನಾಂದೋಲನದ ಅಂಗವಾಗಿ ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿ ನೇತೃತ್ವದಲ್ಲಿ ನಗರದ ಕ್ಲಾಕ್ ಟವರ್ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನೆಯನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಸಚಿವ ಬಿ. ರಮಾನಾಥ ರೈ, ದೇಶದಲ್ಲಿ ಎಸ್‌ಐಆರ್ (ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ) ಮೂಲಕ ಬಿಜೆಪಿ ಮತ ಕಳ್ಳತನದ ಹಾದಿ ಹಿಡಿದಿರುವುದು ಜಗಜ್ಜಾಹೀರಾಗಿದೆ. ಈ ಪ್ರಕ್ರಿಯೆಯ ಗಂಭೀರತೆಯನ್ನು ಜನಸಾಮಾನ್ಯರು ಅರ್ಥಮಾಡಿಕೊಳ್ಳಬೇಕು ಎಂದು ಹೇಳಿದರು.

ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಅಲ್ಲಿನ ರಾಜಕೀಯ ಬೆಳವಣಿಗೆಗಳಲ್ಲಿ ಹಿನ್ನಡೆಯಾಗಿದ್ದು, ಅದೇ ರೀತಿಯ ಪರಿಸ್ಥಿತಿ ಭಾರತದಲ್ಲೂ ಪ್ರಧಾನಿ ನರೇಂದ್ರ ಮೋದಿ ಅವರಿಗೆ ಎದುರಾಗಲಿದೆ. ಮುಂದಿನ ದಿನಗಳಲ್ಲಿ ಅದರ ಪರಿಣಾಮಗಳು ಗೋಚರಿಸಲಿವೆ ಎಂದು ಅಭಿಪ್ರಾಯಪಟ್ಟರು.

ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪದ್ಮರಾಜ್ ಆರ್. ಪೂಜಾರಿ ಮಾತನಾಡಿ, ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಮತದಾನವು ಜನಸಾಮಾನ್ಯರ ಅತ್ಯಂತ ಪ್ರಬಲ ಅಸ್ತ್ರವಾಗಿದೆ. ಆದರೆ ಮತದಾರರ ಈ ಹಕ್ಕನ್ನು ಕಸಿದುಕೊಂಡು ಬಿಜೆಪಿಗೆ ಅನುಕೂಲ ಮಾಡಿಕೊಡುವ ಹುನ್ನಾರ ನಡೆಯುತ್ತಿದೆ. ಚುನಾವಣಾ ಆಯೋಗದ ಕಾರ್ಯವೈಖರಿ ಕುರಿತು ಗಂಭೀರ ಪ್ರಶ್ನೆಗಳು ಎದ್ದಿದ್ದು, ಜನರ ಹಕ್ಕುಗಳ ರಕ್ಷಣೆಗಾಗಿ ದೇಶಾದ್ಯಂತ ಬೀದಿಗಿಳಿದು ಹೋರಾಟ ನಡೆಸುವುದು ಅನಿವಾರ್ಯವಾಗಿದೆ ಎಂದು ಹೇಳಿದರು.

ಮೆಸ್ಕಾಂ ಅಧ್ಯಕ್ಷ ಹರೀಶ್ ಕುಮಾರ್ ಮಾತನಾಡಿ, ಕೇಂದ್ರದ ಬಿಜೆಪಿ ಸರ್ಕಾರವು ಚುನಾವಣಾ ಆಯುಕ್ತರ ಆಯ್ಕೆ ಮತ್ತು ಅಧಿಕಾರಕ್ಕೆ ಸಂಬಂಧಿಸಿದಂತೆ ತನಗೆ ಅನುಕೂಲವಾಗುವ ರೀತಿಯಲ್ಲಿ ಕಾನೂನು ರೂಪಿಸಿದೆ. ಇದೊಂದು ‘ವೋಟ್ ಚೋರಿ’ ಷಡ್ಯಂತ್ರ ಎಂದು ಆರೋಪಿಸಿದರು.

ಎಸ್‌ಡಿಪಿಐ ರಾಜ್ಯಾಧ್ಯಕ್ಷ ಅಬ್ದುಲ್ ಮಜೀದ್ ಮಾತನಾಡಿ, ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ನೀತಿಗಳಿಂದ ಜನಸಾಮಾನ್ಯರು ಸಂಕಷ್ಟ ಎದುರಿಸುತ್ತಿದ್ದಾರೆ. ರಾಜ್ಯ ಸರ್ಕಾರ ತೆರಿಗೆ, ಸೇವಾ ಶುಲ್ಕ ಹಾಗೂ ನೋಂದಣಿ ಶುಲ್ಕಗಳನ್ನು ಹೆಚ್ಚಿಸುತ್ತಿದ್ದರೆ, ಕೇಂದ್ರದ ನೀತಿಗಳಿಂದ ಇಂಧನ ಮತ್ತು ಅಗತ್ಯ ವಸ್ತುಗಳ ಬೆಲೆ ಏರಿಕೆಯಾಗಿದೆ ಎಂದು ಟೀಕಿಸಿದರು.

ಆಮ್ ಆದ್ಮಿ ಪಕ್ಷದ ರಾಜ್ಯ ಉಪಾಧ್ಯಕ್ಷ ವಿವೇಕಾನಂದ ಸಾಲಿನ್ಸ್ ಮಾತನಾಡಿ, ರಾಜ್ಯದಲ್ಲಿ ರಾಜಕೀಯ ಅಸ್ಥಿರತೆ ಮತ್ತು ಆಡಳಿತಾತ್ಮಕ ಹಿನ್ನಡೆ ಕಂಡುಬರುತ್ತಿದೆ. ಆಡಳಿತದಲ್ಲಿ ಪಾರದರ್ಶಕತೆ ತರಲು ಪರ್ಯಾಯ ರಾಜಕೀಯ ವ್ಯವಸ್ಥೆಯ ಅಗತ್ಯವಿದೆ ಎಂದು ಅಭಿಪ್ರಾಯಪಟ್ಟರು.

ಪ್ರತಿಭಟನೆಯಲ್ಲಿ ಮಹಿಳಾ ಕಾಂಗ್ರೆಸ್ ನಗರ ಅಧ್ಯಕ್ಷೆ ಅಪ್ಪಿ ಎಸ್., ಗೇರು ಅಭಿವೃದ್ಧಿ ನಿಗಮದ ಅಧ್ಯಕ್ಷೆ ಮಮತಾ ಗಟ್ಟಿ, ಗುರುಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪದ್ಮನಾಭ ಕೋಟ್ಯಾನ್, ನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಲೀಂ, ಶಾಹುಲ್ ಹಮೀದ್, ಬುಡಾ ಅಧ್ಯಕ್ಷ ಬೇಬಿ ಕುಂದರ್, ಶಶಿಧರ ಹೆಗ್ಡೆ, ಅಬ್ದುಲ್ ರವೂಫ್, ವಿನಯರಾಜ್ ಎ.ಸಿ., ನವೀನ್ ಡಿ. ಸೋಜ, ಅಬ್ಬಾಸ್ ಅಲಿ, ಲುಕ್ಮಾನ್ ಬಂಟ್ವಾಳ, ಇಬ್ರಾಹೀಂ ನವಾಝ್ ಸೇರಿದಂತೆ ಹಲವು ಮುಖಂಡರು ಹಾಗೂ ಕಾರ್ಯಕರ್ತರು ಭಾಗವಹಿಸಿದ್ದರು.

ಬಸ್ ದರ, ಹಾಲಿನ ಬೆಲೆ ಏರಿಕೆ ವಿರುದ್ಧ ಬಿಜೆಪಿ ಆಕ್ರೋಶ

ಇನ್ನೊಂದೆಡೆ, ರಾಜ್ಯ ಸರ್ಕಾರ ಕೆಎಸ್‌ಆರ್‌ಟಿಸಿ ಬಸ್ ಪ್ರಯಾಣ ದರ ಹಾಗೂ ಹಾಲಿನ ಬೆಲೆಯನ್ನು ಹೆಚ್ಚಿಸಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ನಗರದ ಪಿವಿಎಸ್ ವೃತ್ತದ ಸಮೀಪದ ಬಿಜೆಪಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಹಾಗೂ ಮಂಗಳೂರು ದಕ್ಷಿಣ ಕ್ಷೇತ್ರದ ಶಾಸಕ ಡಿ. ವೇದವ್ಯಾಸ ಕಾಮತ್ ಪ್ರತಿಭಟನೆಗೆ ನೇತೃತ್ವ ವಹಿಸಿದ್ದರು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ವೇದವ್ಯಾಸ ಕಾಮತ್, ಕಾಂಗ್ರೆಸ್ ಸರ್ಕಾರ ತನ್ನ ರಾಜಕೀಯ ಚಟುವಟಿಕೆಗಳಿಗೆ ಹಣ ಹೊಂದಿಸುವ ಉದ್ದೇಶದಿಂದ ಜನಸಾಮಾನ್ಯರ ಮೇಲೆ ನಿರಂತರ ಆರ್ಥಿಕ ಹೊರೆ ಹೇರುತ್ತಿದೆ ಎಂದು ಆರೋಪಿಸಿದರು. ಹಿಂದಿನ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಬಸ್ ಪ್ರಯಾಣ ದರವನ್ನು ಶೇ.15ರಷ್ಟು ಹೆಚ್ಚಿಸಿತ್ತು. ಇದೀಗ ಮತ್ತೆ ಶೇ.25ರಿಂದ 40ರಷ್ಟು ದರ ಹೆಚ್ಚಳ ಮಾಡಲಾಗಿದೆ ಎಂದು ದೂರಿದರು.

ಚುನಾವಣೆಗೂ ಮುನ್ನ ಜನರಿಗೆ ನೀಡಿದ್ದ ಗ್ಯಾರಂಟಿ ಭರವಸೆಗಳನ್ನು ಸಮರ್ಪಕವಾಗಿ ಈಡೇರಿಸುವಲ್ಲಿ ಸರ್ಕಾರ ವಿಫಲವಾಗಿದೆ ಎಂದು ಬಿಜೆಪಿ ಜಿಲ್ಲಾಧ್ಯಕ್ಷ ಸತೀಶ್ ಕುಂಪಲ ಟೀಕಿಸಿದರು. ಬೆಲೆ ಏರಿಕೆಯನ್ನು ತಕ್ಷಣ ಹಿಂಪಡೆಯದಿದ್ದರೆ ರಾಜ್ಯಾದ್ಯಂತ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲಾಗುವುದು ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದರು.

ರಾಜಕೀಯ ಆರೋಪ–ಪ್ರತ್ಯಾರೋಪಕ್ಕೆ ವೇದಿಕೆಯಾದ ಕರಾವಳಿ

ಒಂದೆಡೆ ಮತದಾರರ ಹಕ್ಕು ಮತ್ತು ಚುನಾವಣಾ ಪ್ರಕ್ರಿಯೆಯ ಪಾರದರ್ಶಕತೆಯನ್ನು ಮುಂದಿಟ್ಟುಕೊಂಡು ಕಾಂಗ್ರೆಸ್ ಹೋರಾಟ ನಡೆಸಿದರೆ, ಮತ್ತೊಂದೆಡೆ ಜನಸಾಮಾನ್ಯರ ಮೇಲೆ ಬೀಳುತ್ತಿರುವ ಬೆಲೆ ಏರಿಕೆಯ ಹೊರೆ ಮುಂದಿಟ್ಟುಕೊಂಡು ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿತು. ಎರಡೂ ಪಕ್ಷಗಳ ಪ್ರತ್ಯೇಕ ಪ್ರತಿಭಟನೆಗಳು ಮಂಗಳೂರಿನಲ್ಲಿ ರಾಜಕೀಯ ಕಾವನ್ನು ಹೆಚ್ಚಿಸಿದ್ದು, ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕಾಂಗ್ರೆಸ್–ಬಿಜೆಪಿ ನಡುವಿನ ರಾಜಕೀಯ ಸಂಘರ್ಷ ಮತ್ತೊಮ್ಮೆ ಬಹಿರಂಗವಾಗಿ ಪ್ರದರ್ಶನಗೊಂಡಿತು.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

BJP

ರಾಜ್ಯ ಬಿಜೆಪಿಯಲ್ಲಿ ‘ತ್ರಿಬಲ್ ಸರ್ಜರಿ’ಗೆ ಮುಹೂರ್ತ ಫಿಕ್ಸ್: ವಿಜಯೇಂದ್ರ ಔಟ್, ಸೋಮಣ್ಣ ಇನ್? ಬಿಎಸ್ ವೈಗೆ ಹೈಕಮಾಂಡ್ ಮಾಸ್ಟರ್ ಪ್ಲಾನ್ !

Published

on

ಬೆಂಗಳೂರು: 2028ರ ಕರ್ನಾಟಕ ವಿಧಾನಸಭಾ ಚುನಾವಣೆಗೆ ಇನ್ನೂ ಸಮಯವಿರುವಾಗಲೇ, ರಾಜ್ಯ ಬಿಜೆಪಿಯಲ್ಲಿ ಮಹತ್ವದ ಸಾಂಸ್ಥಿಕ ಹಾಗೂ ನಾಯಕತ್ವ ಬದಲಾವಣೆಗಳಿಗೆ ಹೈಕಮಾಂಡ್ ವೇದಿಕೆ ಸಜ್ಜುಗೊಳಿಸಿದೆ. ಪ್ರಸ್ತುತ ಚಾಲ್ತಿಯಲ್ಲಿರುವ ರಾಜಕೀಯ ಚರ್ಚೆಗಳ ಪ್ರಕಾರ, ನವೆಂಬರ್ ಮಾಸಾಂತ್ಯದೊಳಗೆ ರಾಜ್ಯ ಬಿಜೆಪಿಯಲ್ಲಿ ಮೂರು ಪ್ರಮುಖ ‘ಮೇಜರ್ ಸರ್ಜರಿ’ಗಳು ನಡೆಯುವುದು ಬಹುತೇಕ ಖಚಿತವಾಗಿದೆ.

ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಕುಟುಂಬದ ಸುತ್ತಲೇ ಸುತ್ತುತ್ತಿರುವ ಈ ಬೆಳವಣಿಗೆಯಲ್ಲಿ, ಅವರ ಒಬ್ಬ ಪುತ್ರ ಅಧ್ಯಕ್ಷ ಸ್ಥಾನದಿಂದ ನಿರ್ಗಮಿಸಿದರೆ, ಇನ್ನೊಬ್ಬ ಪುತ್ರನಿಗೆ ಕೇಂದ್ರ ಸಚಿವ ಸಂಪುಟದಲ್ಲಿ ಸ್ಥಾನ ದೊರೆಯುವ ಸಾಧ್ಯತೆ ದಟ್ಟವಾಗಿದೆ. ಜೆಡಿಎಸ್ ಜೊತೆಗಿನ ಮೈತ್ರಿಯನ್ನು ಸುದೃಢಗೊಳಿಸುವುದು ಹಾಗೂ ಪಕ್ಷದ ಭಿನ್ನಮತೀಯರನ್ನು ತಣ್ಣಗಾಗಿಸಿ ಮುಂಬರುವ ಸವಾಲುಗಳಿಗೆ ಪಕ್ಷವನ್ನು ಸಜ್ಜುಗೊಳಿಸುವುದು ಹೈಕಮಾಂಡ್‌ನ ಮುಖ್ಯ ಉದ್ದೇಶವಾಗಿದೆ.

ರಾಜ್ಯ ಬಿಜೆಪಿಯಲ್ಲಿ ಸಂಭವಿಸಲಿರುವ ಆ 3 ಪ್ರಮುಖ ಬದಲಾವಣೆಗಳ ವಿವರ ಇಲ್ಲಿದೆ:

1. ಬಿ.ವೈ. ವಿಜಯೇಂದ್ರ ಔಟ್ – ವಿ. ಸೋಮಣ್ಣಗೆ ರಾಜ್ಯ ಬಿಜೆಪಿ ಸಾರಥ್ಯ?

ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ 3 ವರ್ಷಗಳ ಅವಧಿ ನವೆಂಬರ್ 10ಕ್ಕೆ ಮುಕ್ತಾಯಗೊಳ್ಳಲಿದೆ. ಪಕ್ಷದಿಂದ ಉಚ್ಚಾಟಿತರಾಗಿದ್ದ ಬಸನಗೌಡ ಪಾಟೀಲ್ ಯತ್ನಾಳ್ ಅವರು ಪಕ್ಷಕ್ಕೆ ವಾಪಸ್ ಬರಲು “ವಿಜಯೇಂದ್ರ ಅವರನ್ನು ಅಧ್ಯಕ್ಷ ಸ್ಥಾನದಿಂದ ಕೆಳಗಿಳಿಸಬೇಕು” ಎಂಬ ಷರತ್ತು ವಿಧಿಸಿದ್ದರು. ಈ ಷರತ್ತಿಗೆ ವಿಜಯೇಂದ್ರ ಕೂಡ ಸಮ್ಮತಿ ಸೂಚಿಸಿದ್ದರು ಎನ್ನಲಾಗಿದೆ.

ಈ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯದ ಪ್ರಭಾವಿ ನಾಯಕ, ಪ್ರಸ್ತುತ ಕೇಂದ್ರ ರೈಲ್ವೇ ರಾಜ್ಯ ಸಚಿವರಾಗಿರುವ ವಿ. ಸೋಮಣ್ಣ ಅವರನ್ನು ನೂತನ ರಾಜ್ಯಾಧ್ಯಕ್ಷರನ್ನಾಗಿ ನೇಮಿಸಲು ಹೈಕಮಾಂಡ್ ಫೈನಲ್ ಮಾಡಿದೆ ಎನ್ನಲಾಗುತ್ತಿದೆ. ಸೋಮಣ್ಣ ಅವರ ನೇಮಕಕ್ಕೆ ಯತ್ನಾಳ್ ಸೇರಿದಂತೆ ಬಿಜೆಪಿಯ ಯಾವುದೇ ಭಿನ್ನಮತೀಯ ನಾಯಕರ ತಕರಾರಿಲ್ಲದಿರುವುದು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ.

2. ವಿಧಾನಸಭೆ ವಿಪಕ್ಷ ನಾಯಕ ಬದಲು: ಸುನಿಲ್ ಕುಮಾರ್ ಮುಂಚೂಣಿಗೆ!

ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್. ಅಶೋಕ್ ಅವರ ಅವಧಿಯೂ ನವೆಂಬರ್ 17ಕ್ಕೆ 3 ವರ್ಷ ಪೂರೈಸಲಿದೆ. ಕಾಂಗ್ರೆಸ್ ಸರ್ಕಾರದ ವಿರುದ್ಧ ಅಶೋಕ್ ನಿರಂತರ ಹೋರಾಟ ನಡೆಸುತ್ತಿದ್ದರೂ, ಪಕ್ಷದ ಒಳಗಿನ ನಾಯಕರೇ ಅವರ ವಿರುದ್ಧ “ಹೊಂದಾಣಿಕೆ ರಾಜಕೀಯ”ದ ಆರೋಪಗಳನ್ನು ಮಾಡುತ್ತಿದ್ದರು.

ಹೀಗಾಗಿ, ಕರಾವಳಿ ಭಾಗದ ಕಾರ್ಕಳ ಶಾಸಕ ವಿ. ಸುನಿಲ್ ಕುಮಾರ್ ಅವರನ್ನು ನೂತನ ವಿಪಕ್ಷ ನಾಯಕನನ್ನಾಗಿ ಆಯ್ಕೆ ಮಾಡಲು ವರಿಷ್ಠರು ಒಲವು ತೋರಿದ್ದಾರೆ. ಕಳೆದ ಶಾಸನಸಭೆ ಅಧಿವೇಶನದಲ್ಲಿ ಸರ್ಕಾರದ ಲೋಪದೋಷಗಳನ್ನು ಯಶಸ್ವಿಯಾಗಿ ಎತ್ತಿಹಿಡಿದು ಗಮನಸೆಳೆದಿದ್ದ ಸುನಿಲ್ ಕುಮಾರ್ ಅವರಿಗೆ ಈ ಜವಾಬ್ದಾರಿ ಸಿಗುವುದು ಬಹುತೇಕ ನಿಶ್ಚಿತ ಎನ್ನಲಾಗಿದೆ.

3. ಬಿ.ವೈ. ರಾಘವೇಂದ್ರಗೆ ಕೇಂದ್ರ ಸಚಿವ ಸ್ಥಾನ?

ರಾಜ್ಯಾಧ್ಯಕ್ಷ ಸ್ಥಾನದಿಂದ ವಿಜಯೇಂದ್ರ ಅವರನ್ನು ಕೆಳಗಿಳಿಸುವುದರಿಂದ ಮಾಜಿ ಸಿಎಂ ಬಿ.ಎಸ್. ಯಡಿಯೂರಪ್ಪ ಅವರಿಗೆ ಬೇಸರವಾಗದಂತೆ ನೋಡಿಕೊಳ್ಳಲು ಹೈಕಮಾಂಡ್ ಹೊಸ ಪ್ರಪೋಸಲ್ ಒಂದನ್ನು ಮುಂದಿಟ್ಟಿದೆ.

ಇದರ ಪ್ರಕಾರ, ಕೇಂದ್ರ ಸಚಿವ ಸ್ಥಾನದಲ್ಲಿದ್ದ ವಿ. ಸೋಮಣ್ಣ ರಾಜ್ಯ ರಾಜಕಾರಣಕ್ಕೆ (ರಾಜ್ಯಾಧ್ಯಕ್ಷರಾಗಿ) ಮರಳಿದರೆ, ತೆರವಾಗುವ ‘ಕರ್ನಾಟಕ ಕೋಟಾ’ದ ಕೇಂದ್ರ ಸಚಿವ ಸ್ಥಾನವನ್ನು ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರಿಗೆ ನೀಡಲು ನಿರ್ಧರಿಸಲಾಗಿದೆ. ಮೂರು ಬಾರಿ ಸಂಸದರಾಗಿ ಸತತವಾಗಿ ಗೆದ್ದು ಬಂದಿರುವ ರಾಘವೇಂದ್ರ ಅವರಿಗೆ ಈ ಮೂಲಕ ಸೂಕ್ತ ಸ್ಥಾನಮಾನ ಕಲ್ಪಿಸಲು ಯಡಿಯೂರಪ್ಪ ಕೂಡ ಒಪ್ಪಿಗೆ ನೀಡಿದ್ದಾರೆ ಎನ್ನಲಾಗಿದೆ.

ಕುಮಾರ್ ಬಂಗಾರಪ್ಪ ಹೇಳಿಕೆಯಿಂದ ಹೆಚ್ಚಿದ ಕಾವು

ವಿಜಯೇಂದ್ರ ಅವರ ಸ್ಥಾನಕ್ಕೆ ಹೊಸಬರ ಆಯ್ಕೆಯಾಗುವುದು ಶೇ. 99ರಷ್ಟು ಪಕ್ಕಾ ಎಂದು ಯಡಿಯೂರಪ್ಪ ವಿರೋಧಿ ಬಣದಲ್ಲಿ ಗುರುತಿಸಿಕೊಂಡಿರುವ ಮಾಜಿ ಶಾಸಕ ಕುಮಾರ್ ಬಂಗಾರಪ್ಪ ನೀಡಿದ ಹೇಳಿಕೆ ಈ ಎಲ್ಲಾ ಊಹಾಪೋಹಗಳಿಗೆ ಇನ್ನಷ್ಟು ಪುಷ್ಟಿ ನೀಡಿದೆ.

ಈ ಮೂರು ಮೇಜರ್ ಸರ್ಜರಿಗಳ ಮೂಲಕ ಯತ್ನಾಳ್ ಹಾಗೂ ಈಶ್ವರಪ್ಪ ಅವರಂತಹ ಹಿರಿಯ ನಾಯಕರನ್ನು ಮತ್ತೆ ಪಕ್ಷಕ್ಕೆ ಕರೆತಂದು, ಭಿನ್ನಮತ ಶಮನಗೊಳಿಸಿ 2028ರ ಚುನಾವಣೆಗೆ ಈಗಿನಿಂದಲೇ ಕಮಲ ಪಡೆಯನ್ನು ಸಜ್ಜುಗೊಳಿಸಲು ಕೇಂದ್ರ ನಾಯಕತ್ವ ಗ್ರೀನ್ ಸಿಗ್ನಲ್ ನೀಡಿದೆ.

Continue Reading

BJP

ಸುಪ್ರೀಂ ಕೋರ್ಟ್‌ಗೆ ಸುಳ್ಳು ಮಾಹಿತಿ ನೀಡಿದ ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕ್ರಮಕ್ಕೆ ಪ್ರಶಾಂತ್ ಭೂಷಣ್ ಆಗ್ರಹ

Published

on

ಹೊಸದೆಹಲಿ: ಸುಪ್ರೀಂ ಕೋರ್ಟ್‌ಗೆ ಸುಳ್ಳು ಅಫಿಡವಿಟ್ ಸಲ್ಲಿಸಿರುವ ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ವಿರುದ್ಧ ತಕ್ಷಣವೇ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಹಿರಿಯ ನ್ಯಾಯವಾದಿ ಪ್ರಶಾಂತ್ ಭೂಷಣ್ ಆಗ್ರಹಿಸಿದ್ದಾರೆ.

ಚುನಾವಣಾ ಆಯೋಗ (ಇಸಿ) ಕೈಗೊಂಡ ಎಲ್ಲಾ ನಿರ್ಧಾರಗಳಿಗೂ ಸಂಪೂರ್ಣ ಆಯೋಗದ (ಮೂವರೂ ಆಯುಕ್ತರ) ಅನುಮೋದನೆ ಇತ್ತು ಎಂದು ಸುಪ್ರೀಂ ಕೋರ್ಟ್‌ಗೆ ನೀಡಿರುವ ಪ್ರಮಾಣಪತ್ರ ಸಂಪೂರ್ಣವಾಗಿ ಸುಳ್ಳಿನಿಂದ ಕೂಡಿದೆ ಎಂದು ಅವರು ಆರೋಪಿಸಿದ್ದಾರೆ.

‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ವರದಿ ಉಲ್ಲೇಖಿಸಿ ಆರೋಪ

“ಅಫಿಡವಿಟ್‌ನಲ್ಲಿ ಚುನಾವಣಾ ಆಯೋಗ ಹೇಳಿರುವುದು ಸಂಪೂರ್ಣ ಅಸತ್ಯ. ‘ದಿ ಇಂಡಿಯನ್ ಎಕ್ಸ್‌ಪ್ರೆಸ್’ ದಿನಪತ್ರಿಕೆ ಬಹಿರಂಗಪಡಿಸಿರುವ ವರದಿಯ ಪ್ರಕಾರ, ಇತರ ಚುನಾವಣಾ ಆಯುಕ್ತರು ದಾಖಲಿಸಿರುವ ಭಿನ್ನಾಭಿಪ್ರಾಯದ ಟಿಪ್ಪಣಿಗಳು ಹಾಗೂ ಅವರು ಕ್ಯಾಬಿನೆಟ್ ಕಾರ್ಯದರ್ಶಿಗೆ ಸಲ್ಲಿಸಿರುವ ದೂರುಗಳೇ ಇದಕ್ಕೆ ಸ್ಪಷ್ಟ ಸಾಕ್ಷಿಯಾಗಿದೆ” ಎಂದು ಪ್ರಶಾಂತ್ ಭೂಷಣ್ ತಿಳಿಸಿದ್ದಾರೆ.

ಸುಪ್ರೀಂ ಕೋರ್ಟ್‌ನಲ್ಲಿ ಚುನಾವಣಾ ಆಯೋಗದ ಸಮರ್ಥನೆ

ಸಾಮಾಜಿಕ ಕಾರ್ಯಕರ್ತ ರಾಕೇಶ್ ಕುಮಾರ್ ಸಿಂಗ್ ಅವರು ಚುನಾವಣಾ ಆಯೋಗದ ನಿರ್ಧಾರ ಕೈಗೊಳ್ಳುವ ಪ್ರಕ್ರಿಯೆಯನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಗೆ ಸೋಮವಾರ (ಅಕ್ಟೋಬರ್ 26) ಉತ್ತರಿಸಿದ ಆಯೋಗವು, “ಎಲ್ಲಾ ನಿರ್ಧಾರಗಳನ್ನು ಮುಖ್ಯ ಚುನಾವಣಾ ಆಯುಕ್ತರು ಸೇರಿದಂತೆ ಮೂವರು ಆಯುಕ್ತರ ಒಮ್ಮತದ ತೀರ್ಮಾನದಿಂದಲೇ ತೆಗೆದುಕೊಳ್ಳಲಾಗಿದೆ” ಎಂದು ಪ್ರಮಾಣಪತ್ರ ಸಲ್ಲಿಸಿತ್ತು.

ಅಲ್ಲದೆ, “ಆಯುಕ್ತರು ವ್ಯಕ್ತಪಡಿಸುವ ಅವಲೋಕನಗಳು, ಸಲಹೆಗಳು ಮತ್ತು ಪ್ರಶ್ನೆಗಳು ಅವರ ವೈಯಕ್ತಿಕ ಅಭಿಪ್ರಾಯಗಳಷ್ಟೇ ಹೊರತು, ಅವು ಆಯೋಗದ ಅಂತಿಮ ನಿರ್ಧಾರಗಳಲ್ಲ. ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಕಾನೂನುಬದ್ಧವಾಗಿದ್ದು, ಅರ್ಜಿದಾರರ ಆರೋಪಗಳು ತಪ್ಪು ತಿಳುವಳಿಕೆಯಿಂದ ಕೂಡಿವೆ” ಎಂದು ಆಯೋಗ ವಾದಿಸಿತ್ತು.

10 ತಿಂಗಳಲ್ಲಿ 14 ಬಾರಿ ಆಕ್ಷೇಪ ವ್ಯಕ್ತಪಡಿಸಿದ್ದ ಆಯುಕ್ತರು

ಆದರೆ, ಮಾಧ್ಯಮ ವರದಿಗಳ ಪ್ರಕಾರ, ಕಳೆದ 10 ತಿಂಗಳುಗಳಲ್ಲಿ ಚುನಾವಣಾ ಆಯುಕ್ತರಾದ ಸುಖ್‌ಬೀರ್ ಸಿಂಗ್ ಸಂಧು ಮತ್ತು ವಿವೇಕ್ ಜೋಶಿ ಅವರು ತಮಗೆ ಮುಂಚಿತವಾಗಿ ಯಾವುದೇ ಮಾಹಿತಿ ನೀಡದೆ ಆಯೋಗದ ಹೆಸರಿನಲ್ಲಿ ನಿರ್ಧಾರಗಳನ್ನು ಕೈಗೊಳ್ಳಲಾಗುತ್ತಿದೆ ಎಂದು ಆಕ್ಷೇಪಿಸಿ ಸುಮಾರು 14 ಬಾರಿ ಆಕ್ಷೇಪಣಾ ಟಿಪ್ಪಣಿಗಳನ್ನು ದಾಖಲಿಸಿದ್ದಾರೆ. ಈ ವರದಿಯನ್ನು ಆಧಾರವಾಗಿಟ್ಟುಕೊಂಡು ಪ್ರಶಾಂತ್ ಭೂಷಣ್ ಅವರು ಸಿಇಸಿ ಗ್ಯಾನೇಶ್ ಕುಮಾರ್ ವಿರುದ್ಧ ಕಠಿಣ ಕ್ರಮಕ್ಕೆ ಒತ್ತಾಯಿಸಿದ್ದಾರೆ.

Continue Reading

arrest

ಸ್ಟಿಂಗ್ ಪ್ರಕರಣಕ್ಕೆ ಟ್ವಿಸ್ಟ್: ದೆಹಲಿ ಮೂಲದ ರಾಹುಲ್ ಪಾಂಡೆ ವಶಕ್ಕೆ, ಕಾಂಗ್ರೆಸ್ ನಾಯಕಿ ಶರಣು;‌ ಸಂತ್ರಸ್ತೆ ಹೇಳಿಕೆ ದಾಖಲಿಸಿದ ಸಿಸಿಬಿ

Published

on

ಬೆಂಗಳೂರು: ಕರ್ನಾಟಕದಲ್ಲಿ ಭಾರಿ ಚರ್ಚೆಗೆ ಕಾರಣವಾಗಿರುವ ಹೈ ಪ್ರೊಫೈಲ್ ಸ್ಟಿಂಗ್ ಆಪರೇಷನ್ ಪ್ರಕರಣಕ್ಕೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆಗಳು ನಡೆದಿವೆ.

ಸಂತ್ರಸ್ತೆಯ ಹೇಳಿಕೆ ದಾಖಲು, ಪ್ರಮುಖ ಆರೋಪಿ ವಶಕ್ಕೆ:
ಪ್ರಕರಣಕ್ಕೆ ಸಂಬಂಧಿಸಿ ಬೆಂಗಳೂರಿನ ಸಿಸಿಬಿ ಪೊಲೀಸರು ಕೇರಳದ ಕ್ಯಾಲಿಕಟ್ ತರಳಿ ಸಂತ್ರಸ್ತ ಮಹಿಳೆಯ ಹೇಳಿಕೆಯನ್ನು ಪಡೆದಿದ್ದಾರೆ. 2011ರಲ್ಲಿ ಮಹಿಳೆಯನ್ನು ಲೈಂಗಿಕವಾಗಿ ದುರುಪಯೋಗ ಮಾಡಲಾಗಿದೆ ಎಂದು ಸ್ಟಿಂಗ್ ವಿಡಿಯೋದಲ್ಲಿ ಹೇಳಿದ್ದರಿಂದ, ಆಕೆಯನ್ನು ವಿಚಾರಣೆ ನಡೆಸಿ ವಿಡಿಯೋ ಸಂಬಂಧಿಸಿ ವಿಸ್ತೃತ ಹೇಳಿಕೆ ಪಡೆಯಲಾಗಿದೆ. 2011ರಲ್ಲಿ ಘಟನೆ ಏನಾಗಿತ್ತು ಮತ್ತು 2023ರಲ್ಲಿ ವಿಡಿಯೋ ಮಾಡಿರುವ ಉದ್ದೇಶವೇನು, ಯಾವ ಜಾಗದಲ್ಲಿ ವಿಡಿಯೋ ಚಿತ್ರೀಕರಣ ಮಾಡಲಾಗಿತ್ತು ಎಂಬ ಬಗ್ಗೆ ಪೊಲೀಸರು ಮಾಹಿತಿ ಸಂಗ್ರಹಿಸಿದ್ದಾರೆ. ವೈರಲ್ ಆಗಿದ್ದ 2.5 ನಿಮಿಷದ ವಿಡಿಯೋದಲ್ಲಿ ಸಂತ್ರಸ್ತೆಯನ್ನು ಸಂದರ್ಶನ ಮಾಡುವಂತಿತ್ತು, ಆಕೆಯ ಮುಖವನ್ನು ಬ್ಲರ್ ಮಾಡಲಾಗಿತ್ತು.

ಇದೇ ವೇಳೆ ತನಿಖೆಯಲ್ಲಿ ಮಹತ್ವದ ಬೆಳವಣಿಗೆಯಾಗಿದ್ದು, ದೆಹಲಿ ಮೂಲದ ರಾಹುಲ್ ಪಾಂಡೆ ಎಂಬಾತನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ವಿಡಿಯೋ ಚಿತ್ರೀಕರಣಕ್ಕೆ ಬಳಸಿದ್ದ ಕ್ಯಾಮೆರಾವನ್ನು ಈತ ಒದಗಿಸಿದ್ದ ಎನ್ನಲಾಗುತ್ತಿದೆ. ಈಗಾಗಲೇ ವಿಡಿಯೋದಲ್ಲಿದ್ದ ಪವರ್ ಟಿವಿಯ ರಾಕೇಶ್ ಶೆಟ್ಟಿ ಅವರನ್ನು ವಿಚಾರಣೆ ನಡೆಸಿ ಹೇಳಿಕೆ ಪಡೆಯಲಾಗಿದೆ.

ಟ್ವಿಸ್ಟ್ – ಕಾಂಗ್ರೆಸ್ ನಾಯಕಿಯೇ ಶರಣು, ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ:
ಈ ಸ್ಟಿಂಗ್ ಆಪರೇಷನ್ ಹಿಂದೆ ಕಾಂಗ್ರೆಸ್ ನಾಯಕಿ ಕೃಪಾ ಆಳ್ವ ಮತ್ತು ರಾಕೇಶ್ ಶೆಟ್ಟಿ ಇದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ಅವರ ಪುತ್ರ ಯತೀಂದ್ರ ಸಿದ್ದರಾಮಯ್ಯ ಗಂಭೀರ ಆರೋಪ ಮಾಡಿದ್ದಾರೆ.

ಸಿದ್ದರಾಮಯ್ಯ ಅವರನ್ನು ಬ್ಲ್ಯಾಕ್ ಮೇಲ್ ಮಾಡಲು ಮತ್ತು ಅವರ ಹೆಸರನ್ನು ಕೆಡಿಸಲು ಸ್ಟಿಂಗ್ ಆಪರೇಷನ್ ಮಾಡಿದ್ದರಲ್ಲಿ ಕಾಂಗ್ರೆಸ್ ನವರ ಕೈವಾಡವಿದೆ ಎಂದು ಅವರು ಆರೋಪಿಸಿದ್ದಾರೆ. ಸಿದ್ದರಾಮಯ್ಯ ಅವರನ್ನು ತೇಜೋವಧೆ ಮಾಡಿ, ಅವರ ವರ್ಚಸ್ಸನ್ನು ಹಾಳು ಮಾಡಿ ಬ್ಲ್ಯಾಕ್ ಮೇಲ್ ಮಾಡುವ ಪ್ರಯತ್ನ ನಡೆದಿದೆ. ಸಿದ್ದರಾಮಯ್ಯ ಹೆಸರು ಕೆಡಿಸಲು ಸ್ಟಿಂಗ್ ವಿಚಾರವನ್ನು ಮುನ್ನೆಲೆಗೆ ತಂದಿದ್ದಾರೆ ಎಂದು ಯತೀಂದ್ರ ಹೇಳಿದ್ದಾರೆ.

ಈ ಆರೋಪದ ಬೆನ್ನಲ್ಲೇ ಮಂಗಳೂರಿನ ಕಾಂಗ್ರೆಸ್ ಮಹಿಳಾ ನಾಯಕಿ ಬೆಂಗಳೂರಿನ ಸಿಸಿಬಿ ಪೊಲೀಸರ ಮುಂದೆ ಶರಣಾಗಿದ್ದಾರೆ ಎಂದು ತಿಳಿದುಬಂದಿದೆ. ಸದ್ಯ ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಅವರನ್ನು ವಶಕ್ಕೆ ಪಡೆಯುವ ಸಾಧ್ಯತೆ ಇದೆ.

ಮಾಹಿತಿಯ ಪ್ರಕಾರ, ವಿಡಿಯೋದಲ್ಲಿ ಕಾಣಿಸಿಕೊಂಡಿರುವ ಮಹಿಳೆ ಪುತ್ತೂರು ಟಿಕೆಟ್ ಗಾಗಿ ಆಕಾಂಕ್ಷಿಯಾಗಿದ್ದರು ಎಂಬ ಮಾಹಿತಿ ಇದೆ. ಹಾಗಾಗಿ, ರಾಜಕೀಯ ಲಾಭಕ್ಕಾಗಿ ಮತ್ತು ಸಿದ್ದರಾಮಯ್ಯ ಹೆಸರನ್ನು ಕೆಡಿಸಲು ಈ ರೀತಿಯ ಕೃತ್ಯಕ್ಕೆ ಮುಂದಾಗಿರುವುದು ಸ್ಪಷ್ಟವಾಗಿ ಗೋಚರಿಸುತ್ತದೆ ಎಂದು ಯತೀಂದ್ರ ಹೇಳಿದ್ದಾರೆ.

ಈ ಪ್ರಕರಣ ರಾಜಕೀಯ ವಲಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದು, ಆಡಳಿತ ಮತ್ತು ವಿರೋಧ ಪಕ್ಷಗಳ ನಡುವೆ ಆರೋಪ, ಪ್ರತ್ಯಾರೋಪಗಳಿಗೆ ಕಾರಣವಾಗಿದೆ. ಇದರ ನಡುವೆಯೇ ವಿಡಿಯೋದಲ್ಲಿ ಕಾಣಿಸಿಕೊಂಡಿದ್ದ ಕಾಂಗ್ರೆಸ್ ನಾಯಕಿ ಕೃಪಾ ಆಳ್ವಗೆ ಪಕ್ಷದ ಕಡೆಯಿಂದ ನೋಟಿಸ್ ನೀಡಲಾಗಿದೆ. ಪೊಲೀಸರು ಕೂಡ ಅವರ ಹೇಳಿಕೆಯನ್ನು ಪಡೆಯುವ ಸಾಧ್ಯತೆಯಿದೆ.

ಸದ್ಯ ಯತೀಂದ್ರ ಅವರು ತಂದೆಗೆ ಈ ಬಗ್ಗೆ ಮಾಹಿತಿ ನೀಡಿದ್ದು, ಪತ್ರಕರ್ತ ಸೇರಿ ಇಬ್ಬರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದಾರೆ. ಪ್ರಕರಣದಲ್ಲಿ ಯಾರೇ ಇದ್ದರೂ ಅರೆಸ್ಟ್ ಮಾಡಲು ತಂದೆ ಹೇಳಿದ್ದಾರೆ. ನಮ್ಮ ಸರ್ಕಾರದ ತನಿಖೆ ಮೇಲೆ ನಂಬಿಕೆ ಇದೆ, ತನಿಖೆ ಸರಿಯಾಗಿ ನಡೆಯುತ್ತಿದೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!