accident
ರಸ್ತೆ ಅಪಘಾತ ಸಂತ್ರಸ್ತರಿಗೆ ‘ಪಿಎಂ ರಾಹತ್’ ಆಸರೆ: ₹1.5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ – ಮಂಗಳೂರು ನಗರ ಪೋಲೀಸ್ ಆಯುಕ್ತರ ಮಾಹಿತಿ.
ಮಂಗಳೂರು: ರಸ್ತೆ ಅಪಘಾತಗಳಲ್ಲಿ ಗಾಯಗೊಂಡವರಿಗೆ ಹಣಕಾಸಿನ ಕೊರತೆಯಿಂದ ತುರ್ತು ವೈದ್ಯಕೀಯ ಚಿಕಿತ್ಸೆ ವಿಳಂಬವಾಗಬಾರದು ಎಂಬ ಉದ್ದೇಶದಿಂದ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯವು ಜಾರಿಗೆ ತಂದಿರುವ ‘ಪಿಎಂ ರಾಹತ್’ (PM-RAHAT) ಯೋಜನೆಯನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕಾಗಿ ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ಮನವಿ ಮಾಡಿದೆ.
ಈ ಯೋಜನೆಯು ದಿನಾಂಕ 13-02-2026 ರಿಂದ ದೇಶಾದ್ಯಂತ ಜಾರಿಗೆ ಬಂದಿದ್ದು, ಅಪಘಾತ ಸಂಭವಿಸಿದ ವೇಳೆ ಸಂತ್ರಸ್ತರಿಗೆ ಸಮಯಕ್ಕೆ ಸರಿಯಾಗಿ ಜೀವ ರಕ್ಷಣಾ ಚಿಕಿತ್ಸೆ ದೊರೆಯುವಂತೆ ಮಾಡಲು ಇದನ್ನು ರೂಪಿಸಲಾಗಿದೆ.
’ಪಿಎಂ ರಾಹತ್’ ಯೋಜನೆಯ ಪ್ರಮುಖ ಮುಖ್ಯಾಂಶಗಳು:
₹1.5 ಲಕ್ಷದವರೆಗೆ ಉಚಿತ/ನಗದು ರಹಿತ ಚಿಕಿತ್ಸೆ: ಅಪಘಾತ ಸಂಭವಿಸಿದ ದಿನದಿಂದ ಗರಿಷ್ಠ 7 ದಿನಗಳವರೆಗೆ, ಪ್ರತಿ ಸಂತ್ರಸ್ತರಿಗೆ ಖಾಸಗಿ ಸೇರಿದಂತೆ ನಿಗದಿತ ಆಸ್ಪತ್ರೆಗಳಲ್ಲಿ ₹1.5 ಲಕ್ಷದವರೆಗೆ ನಗದು ರಹಿತ ಚಿಕಿತ್ಸೆ ಸಿಗಲಿದೆ.
ಎಲ್ಲ ರಸ್ತೆ ಅಪಘಾತಗಳಿಗೂ ಅನ್ವಯ: ಯಾವುದೇ ರಸ್ತೆಯಲ್ಲಿ ಅಪಘಾತಕ್ಕೊಳಗಾದ ಗಾಯಾಳುಗಳಿಗೂ ಈ ಸೌಲಭ್ಯ ದೊರೆಯುತ್ತದೆ.
24 ಗಂಟೆಯೊಳಗೆ ದಾಖಲಾತಿ ಕಡ್ಡಾಯ: ಅಪಘಾತ ಸಂಭವಿಸಿದ 24 ಗಂಟೆಗಳ ಒಳಗಾಗಿ ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಪ್ರಾರಂಭಿಸಿದರೆ ಮಾತ್ರ ಯೋಜನೆಯ ಲಾಭ ಪಡೆಯಲು ಅರ್ಹರಾಗಿರುತ್ತಾರೆ.
ಡಿಜಿಟಲ್ ನೈಜ ಸಮಯ ಮೇಲ್ವಿಚಾರಣೆ: ಪ್ರಕ್ರಿಯೆಯ ಪಾರದರ್ಶಕತೆ ಹಾಗೂ ಪೊಲೀಸ್ ದೃಢೀಕರಣಕ್ಕಾಗಿ eDAR ಮತ್ತು TMS 2.0 ತಂತ್ರಜ್ಞಾನ ವ್ಯವಸ್ಥೆಗಳನ್ನು ಬಳಸಲಾಗುತ್ತಿದ್ದು, ಮೋಟಾರು ವಾಹನ ಅಪಘಾತ ನಿಧಿಯಿಂದ ಇದಕ್ಕೆ ಹಣಕಾಸು ಒದಗಿಸಲಾಗುತ್ತದೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ರಾಜ್ಯದಲ್ಲೇ ಗರಿಷ್ಠ ಫಲಾನುಭವಿಗಳು:
ಮಂಗಳೂರು ನಗರ ಪೊಲೀಸ್ ಕಮಿಷನರೇಟ್ ವ್ಯಾಪ್ತಿಯಲ್ಲಿ ದಿನಾಂಕ 21-07-2026 ರಿಂದ ಆಸ್ಪತ್ರೆಗಳಲ್ಲಿ ಅಗತ್ಯ ತಾಂತ್ರಿಕ ವ್ಯವಸ್ಥೆ ಅಳವಡಿಸಿ ಯೋಜನೆಯನ್ನು ಯಶಸ್ವಿಯಾಗಿ ಅನುಷ್ಠಾನಗೊಳಿಸಲಾಗುತ್ತಿದೆ.
ಮಂಗಳೂರು ನಗರ: ಇದುವರೆಗೆ 109 ರಸ್ತೆ ಅಪಘಾತ ಗಾಯಾಳುಗಳು ಈ ಯೋಜನೆಯ ಪ್ರಯೋಜನ ಪಡೆದುಕೊಂಡಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆ: ಮಂಗಳೂರು ನಗರ ಸೇರಿದಂತೆ ಜಿಲ್ಲಾದ್ಯಂತ ಒಟ್ಟು 172 ಗಾಯಾಳುಗಳಿಗೆ ನಗದು ರಹಿತ ಚಿಕಿತ್ಸೆ ಒದಗಿಸಲಾಗಿದ್ದು, ರಾಜ್ಯದಲ್ಲೇ ಅತಿ ಹೆಚ್ಚು ಅಪಘಾತ ಸಂತ್ರಸ್ತರಿಗೆ ಸೌಲಭ್ಯ ಕಲ್ಪಿಸಿದ ಹೆಗ್ಗಳಿಕೆಗೆ ಜಿಲ್ಲೆ ಪಾತ್ರವಾಗಿದೆ.
ಅಪಘಾತ ಸಂಭವಿಸಿದ ತಕ್ಷಣವೇ ಸಾರ್ವಜನಿಕರು ವಿಳಂಬ ಮಾಡದೆ ಗಾಯಾಳುಗಳನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಈ ಯೋಜನೆಯ ಸೌಲಭ್ಯ ಪಡೆಯುವಂತೆ ಮಂಗಳೂರು ನಗರ ಪೊಲೀಸ್ ಆಯುಕ್ತರು ಪ್ರಕಟಣೆಯಲ್ಲಿ ಕೋರಿದ್ದಾರೆ.
accident
ವಿಟ್ಲ: ಸರ್ಕಾರಿ ಬಸ್ ನಿರ್ವಾಹಕನಿಗೆ ಇನ್ನೋವಾ ಡಿಕ್ಕಿ – ಗಂಭೀರ ಗಾಯ
ವಿಟ್ಲ: ಮಂಗಳೂರು-ವಿಟ್ಲ ಮಾರ್ಗದಲ್ಲಿ ಸಂಚರಿಸುವ ಸರ್ಕಾರಿ ಬಸ್ಸಿನ ನಿರ್ವಾಹಕನಿಗೆ ಇನ್ನೋವಾ ಕಾರು ಡಿಕ್ಕಿ ಹೊಡೆದ ಪರಿಣಾಮ ನಿರ್ವಾಹಕ ಗಂಭೀರವಾಗಿ ಗಾಯಗೊಂಡ ಘಟನೆ ಮಂಗಲಪದವು ಜಂಕ್ಷನ್ನಲ್ಲಿ ನಡೆದಿದೆ.
ಮಂಗಳೂರಿನಿಂದ ವಿಟ್ಲಕ್ಕೆ ಬರುತ್ತಿದ್ದ ಬಿ.ಸಿ.ರೋಡ್ ಡಿಪೋಗೆ ಸೇರಿದ KA 19 F 3176 ಸಂಖ್ಯೆಯ ಸರ್ಕಾರಿ ಬಸ್ ಮಂಗಲಪದವು ಜಂಕ್ಷನ್ನಲ್ಲಿ ನಿಲ್ಲಿಸಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ.
ಬಸ್ ನಿರ್ವಾಹಕ ಕರೀಮುಲ್ಲಾ (41) ಅವರು ರಸ್ತೆಯ ಇನ್ನೊಂದು ಬದಿಯ ಅಂಗಡಿಗೆ ಬಾಳೆಹಣ್ಣು ತರಲು ಹೋಗಿದ್ದರು. ಮರಳಿ ರಸ್ತೆ ದಾಟುತ್ತಿದ್ದ ವೇಳೆ ಮಂಗಳೂರು ಕಡೆಯಿಂದ ಅತೀ ವೇಗವಾಗಿ ಬರುತ್ತಿದ್ದ KL 65 K 6381 ಸಂಖ್ಯೆಯ ಇನ್ನೋವಾ ಕಾರು ನಿರ್ವಾಹಕನಿಗೆ ಬಲವಾಗಿ ಡಿಕ್ಕಿ ಹೊಡೆದಿದೆ.
ಡಿಕ್ಕಿಯ ರಭಸಕ್ಕೆ ರಸ್ತೆಗೆ ಬಿದ್ದ ಕರೀಮುಲ್ಲಾ ಅವರಿಗೆ ತಲೆಗೆ ಮತ್ತು ಕಾಲಿಗೆ ಗಂಭೀರ ಗಾಯಗಳಾಗಿವೆ. ತಕ್ಷಣ ಸ್ಥಳೀಯರು ಅವರನ್ನು ಆಂಬುಲೆನ್ಸ್ ಮೂಲಕ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
ಅಪಘಾತ ನಡೆದ ತಕ್ಷಣ ಜನ ಜಮಾಯಿಸುತ್ತಿದ್ದಂತೆ ಇನ್ನೋವಾ ಚಾಲಕ ಕಾರು ಸ್ಥಳದಲ್ಲೇ ಬಿಟ್ಟು ಪರಾರಿಯಾಗಿದ್ದಾನೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸ್ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಪರಾರಿಯಾದ ಕಾರು ಚಾಲಕನಿಗಾಗಿ ಶೋಧ ಕಾರ್ಯ ಆರಂಭಿಸಿದ್ದಾರೆ.
accident
ಪ್ರವಾಸಕ್ಕೆಂದು ಹೊರಟ ಸ್ನೇಹಿತರ ಗುಂಪು ಶವವಾಗಿ ವಾಪಸ್..ಉತ್ತರಾಖಂಡ ಹೆಲಿಕಾಪ್ಟರ್ ಪತನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ದುರಂತ ಅಂತ್ಯ
ಬೆಂಗಳೂರು: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಸೇರಿದಂತೆ ಐವರು ಕನ್ನಡಿಗರು ಹಾಗೂ ಪೈಲಟ್ ಸೇರಿ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರಿನಿಂದ ಪ್ರವಾಸ ಕೈಗೊಂಡಿದ್ದ ಸ್ನೇಹಿತರ ಗುಂಪು ಈ ದುರಂತಕ್ಕೆ ಬಲಿಯಾಗಿದೆ. ಮೃತರನ್ನು ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್, ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಬೆಂಗಳೂರಿನಿಂದ ಧಾರ್ಮಿಕ ಪ್ರವಾಸಕ್ಕೆ ತೆರಳಿದ್ದ ಈ ಸ್ನೇಹಿತರ ತಂಡ ಕೇದಾರನಾಥ ಮತ್ತು ಬದರಿನಾಥ ದರ್ಶನ ಪೂರೈಸಿ, ಬದರಿನಾಥದಿಂದ ಡೆಹ್ರಾಡೂನ್ನ ಸಹಸ್ರಧಾರಕ್ಕೆ ಟ್ರಾನ್ಸ್ ಭಾರತ್ ಏವಿಯೇಷನ್ಗೆ ಸೇರಿದ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿತ್ತು. ಮಧ್ಯಾಹ್ನ 1:14 ಕ್ಕೆ ಬದರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಏಕಾಏಕಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಅಲ್ಲದೆ ಹೆಲಿಕಾಪ್ಟರ್ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡು, ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಅಪಘಾತದ ಕುರಿತು ಮಾಹಿತಿ ಪಡೆದ ಉತ್ತರಾಖಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ದುರಂತ ಸಾವು ಅವರ ಕುಟುಂಬಸ್ಥರು ಹಾಗೂ ಆಪ್ತರ ವಲಯದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.
ತನಿಖೆಗೆ ಆದೇಶ – ಹಾರಾಟ ಸ್ಥಗಿತ:
ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ ಎಲ್ಲಾ ಹೆಲಿಕಾಪ್ಟರ್ಗಳ ಹಾರಾಟವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ
accident
ಕುಂದಾಪುರ: ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಶಾಲಾ ಬಾಲಕಿಯರು ಕೆರೆಗೆ ಬಿದ್ದು ದುರಂತ ಸಾವು
ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು 13 ವರ್ಷದ ಶಾಲಾ ಬಾಲಕಿಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸಮೀಪದ ಕೊಪ್ಪರಿಗೆ ಗುಡ್ಡೆ ಕಡುಬಿನ ಕೆರೆಯಲ್ಲಿ ಭಾನುವಾರ ಸಂಭವಿಸಿದೆ.
ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಮುದ್ದಿನಕೊಪ್ಪ ಮೂಲದ, ಪ್ರಸ್ತುತ ಮುಳ್ಳಿಕಟ್ಟೆ ಟೆಂಟ್ ಹೌಸ್ನಲ್ಲಿ ವಾಸವಾಗಿದ್ದ ಚಂದ್ರು ಬಸವರಾಜ ವೇಷಗಾರ ಎಂಬುವರ ಪುತ್ರಿ ಸುನೀತಾ (13) ಹಾಗೂ ಅವರ ಸಂಬಂಧಿ ದಿ. ಮಂಜುನಾಥ್ ಅವರ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯರಿಬ್ಬರೂ ಹೊಸಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಘಟನೆಯ ವಿವರ: ಭಾನುವಾರ ಸಂಜೆ ಟೆಂಟ್ ಹೌಸ್ ನಿವಾಸಿಗಳಾದ 5 ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ತೆರಳಿದ್ದರು. ಕೆರೆಯ ದಡದಲ್ಲಿ ಸುನೀತಾ ಹಾಗೂ ವೈಶಾಲಿ ಬಟ್ಟೆ ಒಗೆಯುತ್ತಿದ್ದಾಗ, ಸುನೀತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಿಸಲು ಯತ್ನಿಸಿದ ವೈಶಾಲಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಜೊತೆಯಲ್ಲಿದ್ದ ಇತರ ಮಕ್ಕಳು ಕೂಡಲೇ ವಿಷಯ ತಿಳಿಸಿದ್ದು, ಪಾಲಕರು ಹಾಗೂ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಸಂಜೆ 5.15ರ ಅಂದಾಜಿಗೆ ಇಬ್ಬರೂ ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.
ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಶವ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತ ಸುನೀತಾಳ ತಂದೆ ನೀಡಿದ ದೂರಿನನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
