Bantawala
ವಿ.ಜಿ.ಗ್ರಾಮ್ ಜೀ ಯೋಜನೆ ವಾಪಸ್ಸಾತಿಗೆ ಎಲ್ಲಾ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಳ್ಳಿ- ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ
ಮನರೇಗಾ ಯೋಜನೆ ಬದಲು ವಿ.ಜಿ.ಗ್ರಾಮ್ ಜೀ ಯೋಜನೆ ಮಾಡದಂತೆ ಒತ್ತಾಯಿಸಿ ವಾಪಸ್ಸಾತಿಗೆ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ನಿರ್ಣಯ ಕೈಗೊಳ್ಳುವಂತೆ – ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಕರೆ

ಮನರೇಗಾ ಯೋಜನೆಯನ್ನು ಹಂತ ಹಂತವಾಗಿ ಮೊಟಕುಗೊಳಿಸುವ ಕೇಂದ್ರ ಸರ್ಕಾರದ ಉದ್ದೇಶದ ವಿರುದ್ಧ ಜಿಲ್ಲೆಯ ಎಲ್ಲಾ ಗ್ರಾಮ ಪಂಚಾಯತಿಗಳು ರಾಜಕೀಯ ನೋಡದೆ ಪಕ್ಷಾತೀತವಾಗಿ ಖಂಡನ ನಿರ್ಣಯ ಕೈಗೊಳ್ಳಬೇಕು ಎಂದು ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಅಧ್ಯಕ್ಷ ಕುಳಾಲು ಸುಭಾಶ್ಚಂದ್ರ ಶೆಟ್ಟಿ ಆಗ್ರಹಿಸಿದ್ದಾರೆ. ಅವಧಿ ಮುಗಿದ ಗ್ರಾಮ ಪಂಚಾಯತಿಗಳಿದ್ದಲ್ಲಿ ವಿಶೇಷ ಸಭೆ ಕರೆದು ಆದರೂ ಈ ಕುರಿತು ಸ್ಪಷ್ಟ ನಿಲುವು ವ್ಯಕ್ತಪಡಿಸಬೇಕೆಂದು ಅವರು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಯು.ಪಿ.ಎ ಸರ್ಕಾರ ಜಾರಿಗೆ ತಂದ ಮನರೇಗಾ ಕಾನೂನು ಬಡಜನರಿಗೆ ಉದ್ಯೋಗ ಭದ್ರತೆ ನೀಡಿದಷ್ಟೇ ಅಲ್ಲದೆ, ಗ್ರಾಮ ಪಂಚಾಯತಿಗಳಿಗೆ ದೊಡ್ಡ ಆರ್ಥಿಕ ಸಂಪನ್ಮೂಲವಾಗಿ ಪರಿಣಮಿಸಿತ್ತು. ಗ್ರಾಮೀಣ ಅಭಿವೃದ್ಧಿ, ಆಸ್ತಿ ನಿರ್ಮಾಣ ಹಾಗೂ ಆಡಳಿತಾತ್ಮಕ ಕಾರ್ಯಗಳಿಗೆ ಈ ಯೋಜನೆ ಪ್ರಮುಖ ಆಧಾರವಾಗಿತ್ತು. ಆದರೆ ಇತ್ತೀಚಿನ ವರ್ಷಗಳಲ್ಲಿ ಸಂಪನ್ಮೂಲ ಕೊರತೆಯಿಂದಾಗಿ ಪಂಚಾಯತಿಗಳು ಕನಿಷ್ಠ ಕೆಲಸಗಳನ್ನೂ ನಿರ್ವಹಿಸಲಾಗದ ಸ್ಥಿತಿಗೆ ತಲುಪಿವೆ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

15ನೇ ಹಣಕಾಸು ಆಯೋಗದ ಅನುದಾನ ಇನ್ನೂ ಬಿಡುಗಡೆಯಾಗದಿರುವುದರಿಂದ ಸ್ವಂತ ನಿಧಿ ಸಂಪನ್ಮೂಲವಿಲ್ಲದ ಅನೇಕ ಗ್ರಾಮ ಪಂಚಾಯತಿಗಳಲ್ಲಿ ಜನಪ್ರತಿನಿಧಿಗಳು ಸಾರ್ವಜನಿಕರನ್ನು ಎದುರಿಸಲು ಸಾಧ್ಯವಾಗದೆ ತರೆಮರೆಸಿಕೊಳ್ಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ. ಮೂಲಭೂತ ಸೌಕರ್ಯಗಳನ್ನು ಒದಗಿಸಲು ಸಾಧ್ಯವಾಗದೆ ಪಂಚಾಯತಿಗಳು ಅಸಹಾಯಕ ಸ್ಥಿತಿಗೆ ತಳ್ಳಲ್ಪಟ್ಟಿವೆ.

ಯು.ಪಿ.ಎ ಸರಕಾರದ ಅವಧಿಯ ಸೋನಿಯಾ ಗಾಂಧಿಯ ಮಾರ್ಗದರ್ಶನದಲ್ಲಿ ಮನಮೋಹನ ಸಿಂಗ್ ರವರು ಮನರೇಗಾ ಯೋಜನೆಯನ್ನು ಜಾರಿಗೆ ತಂದ ಸಂದರ್ಭದಲ್ಲಿ ಗ್ರಾಮ ಪಂಚಾಯತ್ ಅದ್ಯಕ್ಷನಾಗಿದ್ದ ಸ್ವತಃ ನನ್ನ ಅನುಭವದಲ್ಲಿ ಗ್ರಾಮದ ಕೃಷಿ,ಹೈನುಗಾರಿಕೆ,ಶಿಕ್ಷಣ,ರಸ್ತೆ,ತಡೆಗೋಡೆ,ಅಂತರ್ಜಲ ವೃದ್ದಿ,ಸ್ವಚ್ಚತೆ ಇತ್ಯಾದಿ ಗ್ರಾಮೀಣಾ ಸರ್ವಾಂಗೀಣ ಅಭಿವೃದ್ದಿಯನ್ನು ಕೈಗೊಂಡು ಸತತ ಮೂರು ವರ್ಷ ಒಂದರಿಂದ ಒಂದೂವರೆ ಕೋಟಿಯವರೆಗೆ ಆರ್ಥಿಕ ವೆಚ್ಚವನ್ನು ಭರಿಸಿ ಜಿಲ್ಲೆಯಲ್ಲೇ ಪ್ರಥಮ ಸ್ಥಾನ ಗಳಿಸಿದ ಹಗ್ಗಳಿಕೆ ನಮ್ಮ ಗ್ರಾಮ ಪಂಚಾಯತಿಗೆ ಒದಗಿರುವುದು ಅಲ್ಲದೆ ಜನಸ್ನೇಹಿ ಆಡಳಿತ ನೀಡಲು ಸಹಾಕಾರಿಯಾಗಿರುವುದು ಮನರೇಗಾ ಯೋಜನೆ ಎಂದು ದೈರ್ಯದಿಂದ ಹೇಳಬಲ್ಲೆ ಎಂದು ಶೆಟ್ಟಿ ಹೇಳಿದ್ದಾರೆ.

ಇಂತಹ ಸಂಕಷ್ಟಕರ ಸಂದರ್ಭದಲ್ಲಿ ಮನರೇಗಾ ಯೋಜನೆಯ ಯು.ಪಿ.ಎ ಕಾಲದ ನಿಯಮಗಳನ್ನು ತೆಗೆದುಹಾಕಿ, ರಾಜ್ಯ–ಕೇಂದ್ರ ಪಾಲನ್ನು 60:40 ರೂಪದಲ್ಲಿ ವಿಧಿಸಿರುವುದು ಕೇಂದ್ರ ಸರ್ಕಾರದ ತಪ್ಪು ನಿರ್ಧಾರವಾಗಿದ್ದು, ಯಾವುದೇ ರಾಜ್ಯ ಸರ್ಕಾರಕ್ಕೆ ಇದನ್ನು ಸಮರ್ಥವಾಗಿ ನಿರ್ವಹಿಸಲು ಸಾಧ್ಯವಿಲ್ಲ. ಇದು ಯೋಜನೆಯನ್ನು ಪರೋಕ್ಷವಾಗಿ ಸ್ಥಗಿತಗೊಳಿಸುವ ತಂತ್ರವಾಗಿದ್ದು, ಇದರಿಂದ ಗ್ರಾಮ ಪಂಚಾಯತಿಗಳ ಅಸ್ತಿತ್ವಕ್ಕೇ ಅಪಾಯ ಎದುರಾಗಲಿದೆ ಎಂದು ಅವರು ಎಚ್ಚರಿಸಿದರು.

ರಾಜಕೀಯ ಭೇದಭಾವವಿಲ್ಲದೆ ಗ್ರಾಮ ಸರಕಾರವೆಂದೇ ಕರೆಯಲ್ಪಟ್ಟ ಗ್ರಾಮ ಪಂಚಾಯತಿಗಳ ಅಸ್ತಿತ್ವ ಉಳಿಸಿಕೊಳ್ಳುವ ಜೊತೆಗೆ ಭವಿಷ್ಯದಲ್ಲಿ ಚುನಾಯಿತ ಯಾವುದೇ ಜನಪ್ರತಿನಿದಿಗಳು ಆಡಳಿತ ನಡೆಸುವಾಗ ಜನರ ಆಶೋತ್ತರಗಳನ್ನು ಈಡೇರಿಸಬೇಕಾದಲ್ಲಿ ಈಗಲೇ ಎಚ್ಚರಗೊಂಡು ಜನಾಂದೋಲನ ರೀತಿಯಲ್ಲಿ ಇದರ ವಿರುದ್ದ ಸೆಟೆದು ನಿಲ್ಲಬೇಕಾದ ಅನಿವಾರ್ಯತೆ ಇದೆ. ಗ್ರಾಮ ಸ್ವರಾಜ್ ಹಿತಾಸಕ್ತಿಯನ್ನು ಕಾಪಾಡಬೇಕಾದರೆ ಮನರೇಗಾ ಯೋಜನೆಯೇ ಏಕೈಕ ಪರಿಹಾರ. ಯೋಜನೆಯ ಹೆಸರನ್ನು ಬದಲಾಯಿಸುವ ಕೇಂದ್ರದ ಚಿಂತನೆ ಮಹಾತ್ಮಾ ಗಾಂಧೀಜಿಯವರಿಗೆ ಮಾಡಿದ ಅವಮಾನವಾಗಿದ್ದು, ಗ್ರಾಮ ಸ್ವರಾಜ್ಯದ ಆಶಯಗಳನ್ನೇ ಹಾಳುಗೆಡವುವ ಕ್ರಮವಾಗಿದೆ ಎಂದು ಕುಳಾಲು ಸುಭಾಶ್ಚಂದ್ರ ಶೆಟ್ಟಿ ಖಂಡಿಸಿದ್ದಾರೆ
Bantawala
75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.
ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.
ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ದೂರಿನ ಹಿನ್ನೆಲೆ:ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.
ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ.
ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.
Bantawala
ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!
ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.
ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.
34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.
ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.
ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.
Bantawala
ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ
ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
