Connect with us

Bantawala

ವಿಟ್ಲ ಠಾಣಾ ವ್ಯಾಪ್ತಿಯ ಕಂಬಳಬೆಟ್ಟು ನೂಜಿಯಲ್ಲಿ ಭಾರಿ ಸ್ಫೋಟ..ಸರ್ಕಾರಿ ಜಮೀನಲ್ಲಿ ಅಕ್ರಮ ಸಿಡಿಮದ್ದು ತಯಾರಿಕೆ, ಎರಡನೇ ಬಾರಿ ಸ್ಫೋಟ; 2017ರಲ್ಲಿ ಇಬ್ಬರ ಬಲಿ ಪಡೆದಿದ್ದ ಗರ್ನಾಲ್ ಗಫೂರ್.

Published

on

ಅಧಿಕಾರಿಗಳು ಕರ್ತವ್ಯದಲ್ಲಿ ಮೈಮರೆತರೆ ಏನಾಗಬಹುದು ಎಂಬುದಕ್ಕೆ ವಿಟ್ಲ ಹೊರವಲಯದ ಕಂಬಳೆಟ್ಟು ನೂಜಿಯಲ್ಲಿ ಎರಡನೇ ಬಾರಿ ಸಂಭವಿಸಿದ ಸ್ಫೋಟ ಸಾಕ್ಷಿಯಾಗಿದೆ.
2017ರಲ್ಲಿ ಇಬ್ಬರು ಬಡ ಕುಟುಂಬದ ಕಾರ್ಮಿಕರ ಬಲಿ ಪಡೆದಿದ್ದ ಪ್ರಕರಣ ಇನ್ನೂ ನ್ಯಾಯಾಲಯದಲ್ಲಿ ಜೀವಂತವಿದ್ದರೂ ಕಾನೂನಿಗೆ ಸಡ್ಡು ಹೊಡೆದ ಗರ್ನಾಲ್ ಗಫೂರ್ ಮತ್ತೆ ತನ್ನ ಹಿಂದಿನ ಚಾಳಿಯನ್ನೇ ಮುಂದುವರಿಸಿದ್ದಾನೆ.

ವಿಟ್ಲ : ವಿಟ್ಲ ಮುಡ್ನೂರು ಗ್ರಾಮ ಪಂಚಾಯತ್ ವ್ಯಾಪ್ತಿಯಯಾಗಿದ್ದರೂ ವಿಟ್ಲ ಪಟ್ಟಣ ಪಂಚಾಯತ್ ಗೆ ಸೇರಿದ 49/1ಸ.ನಂ.ದ ಸರ್ಕಾರಿ ಜಮೀನಿನಲ್ಲಿ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಶುಕ್ರವಾರ ಸಂಜೆ ಭಾರಿ ಸ್ಫೋಟ ಸಂಭವಿಸಿದ್ದು ಅದೃಷ್ಟವಶಾತ್ ಇಬ್ಬರು ಬಡ ಕಾರ್ಮಿಕರು ಪಾರಾಗಿದ್ದಾರೆ.

ವಿಟ್ಲ ಮುಡ್ನೂರು ಗ್ರಾಮದ ಕಂಬಳೆಬೆಟ್ಟು ನೂಜಿ ಎಂಬಲ್ಲಿ ಅಬ್ದುಲ್ ಗಫೂರ್ ಎಂಬಾತ ಅಕ್ರಮವಾಗಿ ಸಿಡಿಮದ್ದು ತಯಾರಿಸುತ್ತಿದ್ದಾನೆ. ಸಿಡಿಮದ್ದು ತಯಾರಿಸಿದ ಬಳಿಕ ವಿಟ್ಲ ಪಟ್ಟಣ ಪಂಚಾಯತ್ ವ್ಯಾಪ್ತಿಯ 49/1ರಲ್ಲಿನ ಸರ್ಕಾರಿ ಜಮೀನಿನ ಗುಡ್ಡದಲ್ಲಿ ಶೇಖರಿಸಿಟ್ಟ ಸಂದರ್ಭದಲ್ಲಿ ಆಕಸ್ಮಿಕವಾಗಿ ಸ್ಫೋಟಗೊಂಡಿದೆ. ಸ್ಫೋಟ ಸಂಭವಿಸುವ ಕೆಲ ಸೆಂಕುಂಡುಗಳ ಮೊದಲು ಕೃಷ್ಣ ಮತ್ತು ಅಜ್ಜು ಎಂಬಿಬ್ಬರು ಕಾರ್ಮಿಕರು ಸ್ಥಳದಿಂದ ತೆರಳಿದ್ದಾರೆ. ಕಾರ್ಮಿಕರಿಬ್ಬರು ಕೇವಲ ಮೂವತ್ತು ಅಡಿ ದೂರ ತಲುಪುವಷ್ಟರಲ್ಲಿ ಶೇಖರಿಸಿಟ್ಟ ಭಾರಿ ಪ್ರಮಾಣದ ಸಿಡಿಮದ್ದುಗಳು ಸ್ಫೋಟಗೊಂಡಿದೆ. ಸ್ಫೋಟದ ತೀವ್ರತೆಗೆ ಐನೂರು ಅಡಿಗಳಷ್ಟು ದೂರಕ್ಕೆ ಗುಡ್ಡದಲ್ಲಿನ ಮರ-ಗಿಡಗಳು ಛಿದ್ರಗೊಂಡು ಹಾರಿವೆ. ಬಳಿಕ ಗುಡ್ಡಕ್ಕೆ ಬೆಂಕಿ ಹತ್ತಿಕೊಂಡಿದೆ. 2017ರಲ್ಲಿ ಇದೇ ಅಬ್ದುಲ್ ಗಫೂರ್ ಸಾಹೇಬ ಸಿಡಿಮದ್ದು ತಯಾರಿಸುತ್ತಿದ್ದ ಸ್ಥಳದಲ್ಲಿ ಭಾರಿ ಸ್ಫೋಟ ಸಂಭವಿಸಿತ್ತು. ಆ ಸಂದರ್ಭ ಸ್ಥಳದಲ್ಲಿದ್ದ ಕಾರ್ಮಿಕರ ದೇಹ ಛಿದ್ರ ಛಿದ್ರವಾಗಿ ನೂರು ಅಡಿಗಳಷ್ಟು ಎತ್ತರದ ಮರದಲ್ಲಿ ದೇಹದ ಭಾಗಗಳು ನೇತಾಡಿಕೊಂಡಿತ್ತು. ಆದರೂ ಕಾನೂನಿಗೆ ಸಡ್ಡು ಹೊಡೆದು ಮತ್ತೆ ಸಿಡಿಮದ್ದು ತಯಾರಿಕೆ ಮುಂದುವರಿಸಿದ್ದ ಅಬ್ದುಲ್ ಗಫೂರ್ ಸಾಹೇಬ ಇದೀಗ ಎರಡನೆ ಬಾರಿ ಸ್ಫೋಟಗೊಂಡಿದ್ದ ಕಾರಣ ಕಾನೂನು ಕುಣಿಕೆಯಲ್ಲಿ ಸಿಲುಕಿಕೊಂಡಿದ್ದಾನೆ. ಸ್ಫೋಟದ ತೀವ್ರತೆಗೆ ಸುಮಾರು ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಭಾರಿ ಕಂಪನ ಸಂಭವಿಸಿದ್ದು ಜನ ಆತಂಕಗೊಂಡಿದ್ದಾರೆ.

ಪ್ರಕರಣ ಮುಚ್ಚಿ ಹಾಕಲು ಶತ ಪ್ರಯತ್ನ..
ಸರ್ಕಾರಿ ಜಮೀನಲ್ಲಿ ಕಾನೂನಿಗೆ ಸಡ್ಡು ಹೊಡೆದು ಅಕ್ರಮ ಜೋಪಡಿ ನಿರ್ಮಿಸಿದ್ದಲ್ಲದೇ ಈ ಹಿಂದೆ ಇಬ್ಬರ ಬಲಿ ಪಡೆದಿದ್ದ ಪ್ರಕರಣ ಇನ್ನೂ ಜೀವಂತವಾಗಿದ್ದರೂ ಅತಿ ಬುದ್ಧಿವಂತ ಗರ್ನಾಲ್ ಗಫೂರ್ ಮತ್ತೆ ಸಿಡಿಮದ್ದು ತಯಾರಿಸುತ್ತಿದ್ದಾನೆಂದರೆ ಈತನ ಅಕ್ರಮಕ್ಕೆ ಅಭಯ ನೀಡುವವರು ಯಾರು ಎಂಬುದೇ ಯಕ್ಷಪ್ರಶ್ನೆಯಾಗಿದೆ.
ಗುಡ್ಡದಲ್ಲಿ ಸ್ಫೋಟ ಸಂಭವಿಸಿ ಮೂರು ಕಿಲೋಮೀಟರ್ ವ್ಯಾಪ್ತಿಯಲ್ಲಿ ಭಾರಿ ಕಂಪನ ಸಂಭವಿಸಿ ಜನ ಆತಂಕಗೊಂಡಿದ್ದಾರೆ. ಆದರೆ ಅತಿ ಬುದ್ಧಿವಂತ ಗರ್ನಾಲ್ ಗಫೂರ್ ಮಾತ್ರ ತನ್ನ ಕರಾಮತ್ತು ಹೊರಜಗತ್ತಿಗೆ ತಿಳಿಯದಂತೆ ಮಾಡಲು ಸಾಕಷ್ಟು ಕನಸು ಕಂಡಿದ್ದಾನೆ.
ಸ್ಫೋಟ ಸಂಭವಿಸಿದ ಸ್ಥಳದಿಂದ ನೂರು ಮೀಟರ್ ವ್ಯಾಪ್ತಿಯಲ್ಲಿನ ಸರ್ಕಾರಿ ಸ್ಥಳದಲ್ಲಿ ನಿರ್ಮಿಸಿದ್ದ ಶೆಡ್ಡಿನ ಮೇಲ್ಛಾವಣಿಯ ಸಿಮೆಂಟ್ ಶೀಟುಗಳನ್ನು ತಾನೇ ಪುಡಿಗೈದು ಸ್ಫೋಟ ಸಂಭವಿಸಿದ ಸ್ಥಳವೆಂದು ತೋರಿಸಿ ಕಿವಿಗೆ ಹೂ ಇಡಲು ತಯಾರಿ ನಡೆಸಿದ್ದಾನೆ. ಆದರೆ ಘಟನಾ ಸ್ಥಳದಲ್ಲಿನ ಪರಿಸ್ಥಿತಿ ಸ್ಫೋಟ ಸಂಭವಿಸಿದ ಸ್ಥಳವಲ್ಲ ಎಂಬುದನ್ನು ಸ್ಥಳಕ್ಕಾಗಮಿಸಿದ ಕಂದಾಯ ನಿರೀಕ್ಷಕರು ಸ್ಪಷ್ಟವಾಗಿ ಹೇಳಿ ನೈಜ ಸ್ಥಳ ತೋರಿಸುವಂತೆ ಗದರಿಸಿದಾಗ ಗರ್ನಾಲ್ ಗಫೂರ್ ಬೆವರಿ ಬೆಂಡಾಗಿದ್ದಾನೆ. ತಕ್ಷಣವೇ ಸ್ಫೋಟ ಸಂಭವಿಸಿದ ನೈಜ ಸ್ಥಳವನ್ನು ತೋರಿಸಿದಾಗ ಇದು ಸರ್ಕಾರಿ ಜಮೀನು ಎಂಬುದನ್ನು ಕಂದಾಯ ಅಧಿಕಾರಿಗಳು ಪತ್ತೆಹಚ್ಚಿದ್ದಾರೆ.

ಸರ್ಕಾರಿ ಜಮೀನಲ್ಲಿ ಅಕ್ರಮ ಐಷಾರಾಮಿ ಬಂಗಲೆ.
ಒಂದೆಡೆ ಸರ್ಕಾರಿ ಜಮೀನಲ್ಲಿ ಅಕ್ರಮ ಸ್ಫೋಟಕ ತಯಾರಿಕೆ, ಇನ್ನೊಂದೆಡೆ ಸರ್ಕಾರಿ ಜಮೀನಲ್ಲಿ ಕೋಟಿ ವೆಚ್ಚದ ಐಷಾರಾಮಿ ಬಂಗಲೆ ನಿರ್ಮಿಸುತ್ತಿರುವ ಗರ್ನಾಲ್ ಗಫೂರ್ ಕಾನೂನಿಗೆ ಸಡ್ಡು ಹೊಡೆದು ಸವಾಲೆಸೆದಿದ್ದಾನೆ.

ಘಟನಾ ಸ್ಥಳಕ್ಕೆ ಕಂದಾಯ ಇಲಾಖೆಯ ಅಧಿಕಾರಿಗಳು, ವಿಟ್ಲ ಪೊಲೀಸರು ಆಗಮಿಸಿ ತನಿಖೆ ನಡೆಸುತ್ತಿದ್ದಾರೆ. ನಾಳೆ ಸ್ಫೋಟಕ ತಜ್ಞರು, ಸೋಕೋ ತಂಡದ ಅಧಿಕಾರಿಗಳು ಆಗಮಿಸಲಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Bantawala

75 ವರ್ಷಗಳ ರಸ್ತೆ ಸಮಸ್ಯೆ ಬಗೆಹರಿಸಿದ ಅಧಿಕಾರಿಗಳು – ಉಕ್ಕುಡ ಕಲ್ಲಜರಿಯಲ್ಲಿ ಅಕ್ರಮ ಗೇಟ್ ತೆರವು.

Published

on

​ವಿಟ್ಲ : ಕಸಬಾ ಗ್ರಾಮದ ಉಕ್ಕುಡ ಕಲ್ಲಜರಿ ಪ್ರದೇಶದಲ್ಲಿ ಕಳೆದ 75 ವರ್ಷಗಳಿಂದ ಸಂಪರ್ಕ ರಸ್ತೆಯಿಲ್ಲದೆ ತೀವ್ರ ಸಂಕಷ್ಟ ಅನುಭವಿಸುತ್ತಿದ್ದ ಮೂರು ಬಡ ಕುಟುಂಬಗಳಿಗೆ ಕೊನೆಗೂ ಮುಕ್ತಿ ಸಿಕ್ಕಿದೆ.

ಸರ್ಕಾರಿ ಜಮೀನಿನಲ್ಲಿ ಹಾದುಹೋಗುತ್ತಿದ್ದ ರಸ್ತೆಗೆ ಖಾಸಗಿ ವ್ಯಕ್ತಿಯೊಬ್ಬರು ಅಕ್ರಮವಾಗಿ ಗೇಟ್ ಅಳವಡಿಸಿ ತಡೆಯೊಡ್ಡಿದ್ದ ಗೇಟನ್ನು ಅಧಿಕಾರಿಗಳ ತಂಡ ಕಾರ್ಯಾಚರಣೆ ನಡೆಸಿ ತೆರವುಗೊಳಿಸಿದೆ. ​ದೂರಿನ ಹಿನ್ನೆಲೆ:​ಸ್ಥಳೀಯ ನಿವಾಸಿ ಶ್ರೀಮತಿ ಜಯಂತಿ ಎಂಬುವರು ಈ ಅಕ್ರಮ ತಡೆಯ ತೆರವಿಗಾಗಿ ವಿಟ್ಲ ಪಟ್ಟಣ ಪಂಚಾಯತಿಗೆ ಅಗತ್ಯ ದಾಖಲೆಗಳ ಸಹಿತ ದೂರು ನೀಡಿದ್ದರು. ದೂರಿನ ಗಂಭೀರತೆಯನ್ನು ಪರಿಗಣಿಸಿದ ಪಟ್ಟಣ ಪಂಚಾಯತ್ ಆಡಳಿತವು ಬಂಟ್ವಾಳ ತಹಶೀಲ್ದಾರರಿಗೆ ಮನವಿ ಸಲ್ಲಿಸಿ ಸೂಕ್ತ ಕ್ರಮಕ್ಕೆ ವಿನಂತಿಸಿತ್ತು.

​ತಹಶೀಲ್ದಾರ್ ಆದೇಶ ಮತ್ತು ಪರಿಶೀಲನೆ:​ಮನವಿಗೆ ತಕ್ಷಣ ಸ್ಪಂದಿಸಿದ ಬಂಟ್ವಾಳ ತಹಶೀಲ್ದಾರರು, ಸ್ಥಳ ತನಿಖೆ ನಡೆಸಿ ಅಕ್ರಮ ಗೇಟ್ ತೆರವುಗೊಳಿಸುವಂತೆ ವಿಟ್ಲ ಕಂದಾಯ ನಿರೀಕ್ಷಕರಿಗೆ ಹಾಗೂ ಭೂ ಮಾಪಕರಿಗೆ ಅಧಿಕೃತ ಆದೇಶ ನೀಡಿದ್ದರು. ​ಅಧಿಕಾರಿಗಳು ನಡೆಸಿದ ಸಮೀಕ್ಷೆ ಹಾಗೂ ಕಂದಾಯ ನಿರೀಕ್ಷಕರ ವರದಿಯ ಪ್ರಕಾರ, ಸರ್ವೇ ನಂ. 727/1ರಲ್ಲಿ ಬರುವ ರಸ್ತೆಯು ಸರ್ಕಾರಿ ಜಮೀನಿನಲ್ಲಿದೆ ಎಂಬುದು ದೃಢಪಟ್ಟಿದೆ. ​ರಸ್ತೆ ಅಭಿವೃದ್ಧಿಗೆ ಮಾತ್ರ ಅವಕಾಶ:​ಈ ಜಮೀನನ್ನು ರಸ್ತೆಯನ್ನು ಅಭಿವೃದ್ಧಿಪಡಿಸಲು ಮತ್ತು ಸಾರ್ವಜನಿಕರ ರಸ್ತೆ ಸಂಪರ್ಕಕ್ಕಾಗಿ ಮಾತ್ರ ಬಳಸಿಕೊಳ್ಳಲು ತಹಶೀಲ್ದಾರ್ ಕಚೇರಿಯಿಂದ ಸ್ಪಷ್ಟ ಆದೇಶ ನೀಡಲಾಗಿದೆ. ಬೇರೆ ಯಾವುದೇ ಉದ್ದೇಶಕ್ಕಾಗಿ ಈ ಸರ್ಕಾರಿ ಜಮೀನನ್ನು ಬಳಸಲು ಅವಕಾಶವಿರುವುದಿಲ್ಲ ಎಂದು ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ​

ಅಕ್ರಮ ಗೇಟ್ ತೆರವು – ಕುಟುಂಬಗಳ ಕೃತಜ್ಞತೆ:​ತಹಶೀಲ್ದಾರ್ ಆದೇಶದಂತೆ ಇಂದು ಕಂದಾಯ ಅಧಿಕಾರಿಗಳು ಹಾಗೂ ವಿಟ್ಲ ಪಟ್ಟಣ ಪಂಚಾಯತ್ ಆಡಳಿತದ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಅಕ್ರಮವಾಗಿ ಹಾಕಲಾಗಿದ್ದ ಗೇಟನ್ನು ತೆರವುಗೊಳಿಸಿ, ಅರ್ಜಿದಾರರಿಗೆ ರಸ್ತೆ ಸಂಪರ್ಕ ಕಲ್ಪಿಸಿಕೊಟ್ಟಿದ್ದಾರೆ. ​ದಶಕಗಳಿಂದ ಅನುಭವಿಸುತ್ತಿದ್ದ ನರಕಯಾತನೆಗೆ ಮುಕ್ತಿ ದೊರೆತಿದ್ದರಿಂದ ಹರ್ಷ ವ್ಯಕ್ತಪಡಿಸಿರುವ ಬಡ ಕುಟುಂಬಗಳು, ಸಕಾಲದಲ್ಲಿ ಸ್ಪಂದಿಸಿ ನ್ಯಾಯ ಒದಗಿಸಿದ ಅಧಿಕಾರಿಗಳಿಗೆ ಹಾಗೂ ಪಟ್ಟಣ ಪಂಚಾಯತ್ ಆಡಳಿತಕ್ಕೆ ಹೃದಯಪೂರ್ವಕ ಕೃತಜ್ಞತೆಗಳನ್ನು ಸಲ್ಲಿಸಿವೆ.

Continue Reading

Bantawala

ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಹೃದಯಾಘಾತಕ್ಕೆ ಬಲಿ: ವಾರದೊಳಗೆ ಇಬ್ಬರು ಮುಖ್ಯಶಿಕ್ಷಕಿಯರ ಸಾವು!

Published

on

ಬಂಟ್ವಾಳ: ಶಿಕ್ಷಣ ಕ್ಷೇತ್ರಕ್ಕೆ ಆಘಾತಕಾರಿ ಸುದ್ದಿ. ಕೆಲಿಂಜ ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ (58) ಅವರು ಹೃದಯಾಘಾತದಿಂದ ನ.2ರಂದು ರಾತ್ರಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಯಲ್ಲಿ ನಿಧನರಾಗಿದ್ದಾರೆ. ವಿಶೇಷವೆಂದರೆ, ವಾರದ ಹಿಂದಷ್ಟೇ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ಕೊನೆಯುಸಿರೆಳೆದಿದ್ದು, ಇದೀಗ ಮತ್ತೋರ್ವ ಮುಖ್ಯಶಿಕ್ಷಕಿಯ ಸಾವು ಶಿಕ್ಷಣ ವಲಯದಲ್ಲಿ ತೀವ್ರ ಶೋಕ ಮೂಡಿಸಿದೆ.

ಗುರುಪುರ ಕೈಕಂಬದ ಕಂದಾವರ ಬೈಲು ನಿವಾಸಿಯಾಗಿದ್ದ ವನಿತಾ ಶೆಟ್ಟಿಗಾರ್ ಅವರು ನ.2ರಂದು ಎಂದಿನಂತೆ ಶಾಲೆಗೆ ತೆರಳಿ ವಿದ್ಯಾರ್ಥಿಗಳಿಗೆ ಪಾಠ ಮಾಡಿ ಮನೆಗೆ ಮರಳಿದ್ದರು. ರಾತ್ರಿ ಮನೆಯಲ್ಲಿ ತೀವ್ರ ಎದೆನೋವು ಕಾಣಿಸಿಕೊಂಡು, ಬಳಿಕ ವಾಂತಿಯಾಗಿದ್ದು, ತಕ್ಷಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಕೊನೆಯುಸಿರೆಳೆದಿದ್ದಾರೆ.

34 ವರ್ಷಗಳ ಸುದೀರ್ಘ ಶಿಕ್ಷಕ ವೃತ್ತಿಯಲ್ಲಿ ಸೇವೆ ಸಲ್ಲಿಸಿದ್ದ ವನಿತಾ ಶೆಟ್ಟಿಗಾರ್ ಅವರು ಅನೇಕ ವಿದ್ಯಾರ್ಥಿಗಳ ಬದುಕಿಗೆ ದಾರಿದೀಪವಾಗಿದ್ದರು. ಅವರ ನಿಧನದಿಂದ ಶಿಕ್ಷಕ ವಲಯದಲ್ಲಿ ಶೋಕ ಆವರಿಸಿದೆ. ಸಹೋದ್ಯೋಗಿ ಶಿಕ್ಷಕರು, ಹಳೆ ವಿದ್ಯಾರ್ಥಿಗಳು, ಪೋಷಕರು ಹಾಗೂ ಶಿಕ್ಷಣಾಭಿಮಾನಿಗಳು ಸಂತಾಪ ಸೂಚಿಸಿದ್ದಾರೆ.

ಇದಕ್ಕೂ ಮೊದಲು ಅಕ್ಟೋಬರ್ 27ರಂದು ಕೆಲಿಂಜ ಶಾಲೆಯ ಸಮೀಪದ ಒಕ್ಕೆತ್ತೂರು ಸರಕಾರಿ ಶಾಲೆಯ ಮುಖ್ಯಶಿಕ್ಷಕಿ ಯಮುನಾ ಅವರು ಅನಾರೋಗ್ಯದಿಂದ ನಿಧನರಾಗಿದ್ದರು. ಈ ಘಟನೆ ನಡೆದು ವಾರ ಕಳೆಯುವ ಮುನ್ನವೇ ಮತ್ತೊಂದು ಶಾಲೆಯ ಮುಖ್ಯಶಿಕ್ಷಕಿ ವನಿತಾ ಶೆಟ್ಟಿಗಾರ್ ಅವರು ಹೃದಯಾಘಾತಕ್ಕೆ ಬಲಿಯಾಗಿರುವುದು ಸ್ಥಳೀಯ ಶಿಕ್ಷಣ ಸಮುದಾಯಕ್ಕೆ ತೀವ್ರ ಆಘಾತವನ್ನುಂಟು ಮಾಡಿದೆ.

ವಾರದ ಅಂತರದಲ್ಲಿ ಇಬ್ಬರು ಶಾಲಾ ಮುಖ್ಯಸ್ಥೆಯರನ್ನು ಕಳೆದುಕೊಂಡಿರುವುದು ಶಿಕ್ಷಕ ಸಮುದಾಯದಲ್ಲಿ ತುಂಬಲಾರದ ನಷ್ಟವಾಗಿ ಪರಿಣಮಿಸಿದೆ.

Continue Reading

Bantawala

ವಿಟ್ಲದ ಖ್ಯಾತ ವೈದ್ಯ ಡಾ. ವಿ.ಕೆ. ಹೆಗ್ಡೆ ಅವರಿಗೆ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ

Published

on

ವಿಟ್ಲದ ಖ್ಯಾತ ವೈದ್ಯ, ಪುಷ್ಪಾಕ್ ಹೆಲ್ತ್ ಸೆಂಟರ್ ಸಂಸ್ಥಾಪಕ *ಡಾ. ವಿ.ಕೆ. ಹೆಗ್ಡೆ* ಅವರಿಗೆ ದಕ್ಷಿಣ ಕನ್ನಡ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿದೆ.1987 ರಿಂದ ವಿಟ್ಲದಲ್ಲಿ ನಿರಂತರವಾಗಿ ವೈದ್ಯಕೀಯ ಸೇವೆ ಸಲ್ಲಿಸುತ್ತಾ ಬಂದಿರುವ ಡಾ. ವಿ.ಕೆ. ಹೆಗ್ಡೆ ಅವರ ವೃತ್ತಿಪರ ಪಯಣವು ಗ್ರಾಮೀಣ ಪ್ರದೇಶದಲ್ಲಿ ದೀರ್ಘಕಾಲದ ಪ್ರಾಥಮಿಕ ಆರೋಗ್ಯ ಸೇವೆಯ ನಿರಂತರ ಅಧ್ಯಾಯವಾಗಿದೆ.ವೈದ್ಯಕೀಯ ವೃತ್ತಿಯನ್ನು ಕೇವಲ ಉದ್ಯೋಗವಾಗಿ ಪರಿಗಣಿಸದೆ, ಜನರ ಆರೋಗ್ಯದ ಅಗತ್ಯಗಳಿಗೆ ಸ್ಪಂದಿಸುವ ಮಾನವೀಯ ಸೇವೆಯಾಗಿ ಅವರು ಅಳವಡಿಸಿಕೊಂಡಿದ್ದಾರೆ. ಗ್ರಾಮೀಣ ಹಾಗೂ ಅರೆನಗರ ಪ್ರದೇಶದ ಜನರಿಗೆ ಸಮಗ್ರ ಪ್ರಾಥಮಿಕ ಆರೋಗ್ಯ ಸೇವೆ, ವೈಯಕ್ತಿಕ ವೈದ್ಯಕೀಯ ಕಾಳಜಿ ಮತ್ತು ಮಾನವೀಯ ಸ್ಪಂದನೆಯನ್ನು ನೀಡುತ್ತಾ ಬಂದಿದ್ದಾರೆ.ವೈದ್ಯಕೀಯ ವೃತ್ತಿಯ ಜೊತೆಗೆ ರೋಟರಿ ಹಾಗೂ ವಿವಿಧ ಸಮಾಜಮುಖಿ ಚಟುವಟಿಕೆಗಳ ಮೂಲಕ ಆರೋಗ್ಯ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರಗಳಲ್ಲಿಯೂ ದೀರ್ಘಕಾಲದ ಕೊಡುಗೆ ನೀಡಿದ್ದಾರೆ.ವಿಶೇಷವಾಗಿ ಕೋವಿಡ್-19 ಮಹಾಮಾರಿಯ ಸಂಕಷ್ಟದ ಅವಧಿಯಲ್ಲಿ ವೈದ್ಯಕೀಯ ಸೇವೆಯ ನಿರಂತರತೆಯನ್ನು ಕಾಪಾಡಿ, ಅಗತ್ಯವಿರುವ ರೋಗಿಗಳಿಗೆ ಸಲಹೆ, ಚಿಕಿತ್ಸೆ, ಮಾರ್ಗದರ್ಶನ ಮತ್ತು ಸೂಕ್ತ ರೆಫರಲ್ ನೆರವು ನೀಡಿದ ಅವರ ಸೇವಾ ಬದ್ಧತೆಯು ಈ ನಾಮನಿರ್ದೇಶನದ ಪ್ರಮುಖ ಅಂಶವಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!