Connect with us

accident

ಮಂತ್ರಾಲಯದ ಬಳಿ ಘೋರ ದುರಂತ: ತುಂಗಭದ್ರಾ ನದಿಗೆ ಸ್ನಾನಕ್ಕಿಳಿದ ಹೈದರಾಬಾದ್ ಮೂಲದ ತಂದೆ-ಮಗ ಸೇರಿ ಐವರು ನೀರುಪಾಲು!

Published

on

ರಾಯಚೂರು/ಮಂತ್ರಾಲಯ: ರಾಯಚೂರು ಜಿಲ್ಲೆಯ ಗಡಿಭಾಗದಲ್ಲಿರುವ ಪ್ರಸಿದ್ಧ ಧಾರ್ಮಿಕ ಕ್ಷೇತ್ರ ಮಂತ್ರಾಲಯದ ಬಳಿ ಭೀಕರ ದುರಂತವೊಂದು ಸಂಭವಿಸಿದೆ. ಕೌಟುಂಬಿಕ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಲು ಬಂದಿದ್ದ ಒಂದೇ ಕುಟುಂಬದ ಐವರು ತುಂಗಭದ್ರಾ ನದಿಯಲ್ಲಿ ಈಜಲು ಹೋಗಿ ನೀರಿನಲ್ಲಿ ಮುಳುಗಿ ಸಾವನ್ನಪ್ಪಿರುವ ದಾರುಣ ಘಟನೆ ವರದಿಯಾಗಿದೆ.

ಮೃತರನ್ನು ಹೈದರಾಬಾದ್ ಮೂಲದ ಸತೀಶ್ (35) ಮತ್ತು ಅವರ 5 ವರ್ಷದ ಪುತ್ರ ಯುವನ ಚಂದ್ರ, ಮಂತ್ರಾಲಯ ಗ್ರಾಮದ ರಾಘವೇಂದ್ರ (25) ಹಾಗೂ ಧನುಷ್ (23) ಮತ್ತು ಉರವಕೊಂಡದ ಸಂಧ್ಯಾ (22) ಎಂದು ಗುರುತಿಸಲಾಗಿದೆ. ಘಟನೆಯಲ್ಲಿ ಅಪರ್ಣಾ ಎಂಬ ಮಹಿಳೆ ಪವಾಡಸದೃಶವಾಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ.

ಸತ್ಯನಾರಾಯಣ ಪೂಜೆಗೆ ಬಂದಿದ್ದಾಗ ದುರಂತ: ಪೊಲೀಸ್ ಮೂಲಗಳ ಪ್ರಕಾರ, ಸುಮಾರು 10 ಜನರಿದ್ದ ಸಂಬಂಧಿಕರ ಗುಂಪೊಂದು ಮಂತ್ರಾಲಯದಲ್ಲಿ ಸಂಬಂಧಿಕರ ಮನೆಯಲ್ಲಿ ಆಯೋಜಿಸಲಾಗಿದ್ದ ಕೌಟುಂಬಿಕ ಕಾರ್ಯಕ್ರಮ ಹಾಗೂ ಸತ್ಯನಾರಾಯಣ ಪೂಜೆಯಲ್ಲಿ ಭಾಗವಹಿಸಲು ಬಂದಿತ್ತು. ಪೂಜೆಯ ಬಳಿಕ ನದಿಯ ದಂಡೆಗೆ ತೆರಳಿದ್ದ ಇವರಲ್ಲಿ ಆರು ಜನರು ತುಂಗಭದ್ರಾ ನದಿಗೆ ಈಜಲು ಮತ್ತು ಸ್ನಾನ ಮಾಡಲು ಇಳಿದಿದ್ದಾರೆ. ಆದರೆ, ನೀರಿನ ಆಳದ ಅಂದಾಜು ಸಿಗದೆ ತೀವ್ರ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಾರೆ.

ನದಿ ದಂಡೆಯಲ್ಲಿದ್ದ ಇತರ ಸಂಬಂಧಿಕರು ತಕ್ಷಣವೇ ಕೂಗಾಡಲು ಆರಂಭಿಸಿದಾಗ, ಸ್ಥಳೀಯ ಮೀನುಗಾರರು ಮತ್ತು ಮಂತ್ರಾಲಯ ಪೊಲೀಸರು ಸ್ಥಳಕ್ಕೆ ಧಾವಿಸಿ ರಕ್ಷಣಾ ಕಾರ್ಯಾಚರಣೆ ನಡೆಸಿದ್ದಾರೆ. ಸದ್ಯ ಹೈದರಾಬಾದ್ ಮೂಲದ ತಂದೆ ಸತೀಶ್ ಹಾಗೂ ಮಗ ಯುವನ ಚಂದ್ರ ಸೇರಿದಂತೆ ಮೂವರ ಮೃತದೇಹಗಳು ಪತ್ತೆಯಾಗಿದ್ದು, ಇನ್ನುಳಿದವರಿಗಾಗಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ವಿಪತ್ತು ನಿರ್ವಹಣಾ ತಂಡದ (SDRF) ಸಹಾಯದೊಂದಿಗೆ ತೀವ್ರ ಶೋಕ ಕಾರ್ಯ ಮುಂದುವರಿದಿದೆ.

ಎಮ್ಮಿಗನೂರು ಡಿವೈಎಸ್‌ಪಿ ಭಾರ್ಗವಿ ಸ್ಥಳಕ್ಕೆ ಭೇಟಿ ಪರಿಶೀಲನೆ ಮಾಡಿದ್ದಾರೆ. ನದಿಯಲ್ಲಿ ನೀರುಪಾಲಾದವರ ಹುಡುಕಾಟ ವೇಳೆ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದ್ದು ಮಂತ್ರಾಲಯಂ ಪೊಲೀಸ್ ಠಾಣೆಯಲ್ಲಿ ಪ್ರತ್ಯೇಕ ಎರಡು ಪ್ರಕರಣಗಳು ದಾಖಲಾಗಿವೆ.

ಪವಿತ್ರ ಕ್ಷೇತ್ರಕ್ಕೆ ಬಂದು ದೇವರ ದರ್ಶನ ಹಾಗೂ ಪೂಜೆ ಮುಗಿಸಿದ ತಕ್ಷಣವೇ ಇಡೀ ಕುಟುಂಬ ದುರಂತಕ್ಕೀಡಾಗಿರುವುದು ಸ್ಥಳದಲ್ಲಿ ಜಮಾಯಿಸಿರುವ ಭಕ್ತರಲ್ಲಿ ಹಾಗೂ ಸಾರ್ವಜನಿಕರಲ್ಲಿ ತೀವ್ರ ಶೋಕವನ್ನುಂಟು ಮಾಡಿದೆ. ಮಂತ್ರಾಲಯ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ




ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

accident

ಪ್ರವಾಸಕ್ಕೆಂದು ಹೊರಟ ಸ್ನೇಹಿತರ ಗುಂಪು ಶವವಾಗಿ ವಾಪಸ್..ಉತ್ತರಾಖಂಡ ಹೆಲಿಕಾಪ್ಟರ್ ಪತನದಲ್ಲಿ ಸಿಸಿಬಿ ಇನ್ಸ್‌ಪೆಕ್ಟರ್ ದುರಂತ ಅಂತ್ಯ

Published

on

ಬೆಂಗಳೂರು: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರಿನ ಸಿಸಿಬಿ ಇನ್‌ಸ್ಪೆಕ್ಟರ್ ಸೇರಿದಂತೆ ಐವರು ಕನ್ನಡಿಗರು ಹಾಗೂ ಪೈಲಟ್ ಸೇರಿ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.

ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರಿನಿಂದ ಪ್ರವಾಸ ಕೈಗೊಂಡಿದ್ದ ಸ್ನೇಹಿತರ ಗುಂಪು ಈ ದುರಂತಕ್ಕೆ ಬಲಿಯಾಗಿದೆ. ಮೃತರನ್ನು ಸಿಸಿಬಿ ಇನ್‌ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್, ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.

ಘಟನೆಯ ವಿವರ:
ಬೆಂಗಳೂರಿನಿಂದ ಧಾರ್ಮಿಕ ಪ್ರವಾಸಕ್ಕೆ ತೆರಳಿದ್ದ ಈ ಸ್ನೇಹಿತರ ತಂಡ ಕೇದಾರನಾಥ ಮತ್ತು ಬದರಿನಾಥ ದರ್ಶನ ಪೂರೈಸಿ, ಬದರಿನಾಥದಿಂದ ಡೆಹ್ರಾಡೂನ್‌ನ ಸಹಸ್ರಧಾರಕ್ಕೆ ಟ್ರಾನ್ಸ್ ಭಾರತ್ ಏವಿಯೇಷನ್‌ಗೆ ಸೇರಿದ ಹೆಲಿಕಾಪ್ಟರ್‌ನಲ್ಲಿ ಪ್ರಯಾಣಿಸುತ್ತಿತ್ತು. ಮಧ್ಯಾಹ್ನ 1:14 ಕ್ಕೆ ಬದರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಏಕಾಏಕಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಅಲ್ಲದೆ ಹೆಲಿಕಾಪ್ಟರ್‌ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡು, ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.

ಅಪಘಾತದ ಕುರಿತು ಮಾಹಿತಿ ಪಡೆದ ಉತ್ತರಾಖಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ದುರಂತ ಸಾವು ಅವರ ಕುಟುಂಬಸ್ಥರು ಹಾಗೂ ಆಪ್ತರ ವಲಯದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.

ತನಿಖೆಗೆ ಆದೇಶ – ಹಾರಾಟ ಸ್ಥಗಿತ:
ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ ಎಲ್ಲಾ ಹೆಲಿಕಾಪ್ಟರ್‌ಗಳ ಹಾರಾಟವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ

Continue Reading

accident

ಕುಂದಾಪುರ: ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಶಾಲಾ ಬಾಲಕಿಯರು ಕೆರೆಗೆ ಬಿದ್ದು ದುರಂತ ಸಾವು

Published

on

ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು 13 ವರ್ಷದ ಶಾಲಾ ಬಾಲಕಿಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸಮೀಪದ ಕೊಪ್ಪರಿಗೆ ಗುಡ್ಡೆ ಕಡುಬಿನ ಕೆರೆಯಲ್ಲಿ ಭಾನುವಾರ ಸಂಭವಿಸಿದೆ.

ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಮುದ್ದಿನಕೊಪ್ಪ ಮೂಲದ, ಪ್ರಸ್ತುತ ಮುಳ್ಳಿಕಟ್ಟೆ ಟೆಂಟ್ ಹೌಸ್‌ನಲ್ಲಿ ವಾಸವಾಗಿದ್ದ ಚಂದ್ರು ಬಸವರಾಜ ವೇಷಗಾರ ಎಂಬುವರ ಪುತ್ರಿ ಸುನೀತಾ (13) ಹಾಗೂ ಅವರ ಸಂಬಂಧಿ ದಿ. ಮಂಜುನಾಥ್ ಅವರ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯರಿಬ್ಬರೂ ಹೊಸಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.

ಘಟನೆಯ ವಿವರ: ಭಾನುವಾರ ಸಂಜೆ ಟೆಂಟ್ ಹೌಸ್ ನಿವಾಸಿಗಳಾದ 5 ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ತೆರಳಿದ್ದರು. ಕೆರೆಯ ದಡದಲ್ಲಿ ಸುನೀತಾ ಹಾಗೂ ವೈಶಾಲಿ ಬಟ್ಟೆ ಒಗೆಯುತ್ತಿದ್ದಾಗ, ಸುನೀತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಿಸಲು ಯತ್ನಿಸಿದ ವೈಶಾಲಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.

ಜೊತೆಯಲ್ಲಿದ್ದ ಇತರ ಮಕ್ಕಳು ಕೂಡಲೇ ವಿಷಯ ತಿಳಿಸಿದ್ದು, ಪಾಲಕರು ಹಾಗೂ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಸಂಜೆ 5.15ರ ಅಂದಾಜಿಗೆ ಇಬ್ಬರೂ ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.

ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಶವ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತ ಸುನೀತಾಳ ತಂದೆ ನೀಡಿದ ದೂರಿನನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

accident

ಕೋಟ: ಸೈಕಲ್‌ಗೆ ಕಾರು ಡಿಕ್ಕಿ – RSS ಮುಖಂಡ ಸ್ಥಳದಲ್ಲೇ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ

Published

on

ಕೋಟ: ಸೈಕಲ್‌ಗೆ ಕಾರು ಡಿಕ್ಕಿ – RSS ಮುಖಂಡ ಸ್ಥಳದಲ್ಲೇ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ

ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್‌ನಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ, ಸ್ಥಳೀಯ RSS ಮುಖಂಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.

ಕೋಟ ಮಣೂರು ನಿವಾಸಿ, ಆರ್‌ಎಸ್‌ಎಸ್ ಮುಖಂಡ ಗುರುದಾಸ್ ಶೆಣೈ ಮೃತಪಟ್ಟವರು. ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.

ಸೋಮವಾರ ಬೆಳಿಗ್ಗೆ ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ ಬಳಿ ಸೈಕಲ್‌ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಧಾವಿಸಿ ಬಂದ ಕಾರು ಸೈಕಲ್‌ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭರಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇತ್ತ ಸೈಕಲ್‌ನಿಂದ ರಸ್ತೆಗೆ ಎಸೆಯಲ್ಪಟ್ಟ ಗುರುದಾಸ್ ಶೆಣೈ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಅಪಘಾತದ ತೀವ್ರತೆಗೆ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!