Connect with us

Belthangady

ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಸಭೆ: ಆಣೆ-ಪ್ರಮಾಣಕ್ಕೆ ಸಿದ್ಧತೆ ?

Published

on

ವಿಧಾನಪರಿಷತ್‌ ಚುನಾವಣೆ (Legislative Council Elections) ರಾಜ್ಯ ರಾಜಕಾರಣದಲ್ಲಿ ಕ್ರಾಸ್​ ವೋಟಿಂಗ್​ ಬಿರುಗಾಳಿ ಎಬ್ಬಿಸಿದೆ.  ಅಡ್ಡ ಮತದಾನವನ್ನು ಗಂಭೀರವಾಗಿ ಪರಿಗಣಿಸಿದ ಬಿಜೆಪಿ, ಇದೀಗ ಅಡ್ಡ ಮತದಾನದ (Cross Voting) ಮಾಡಿದವರನ್ನ ಕಂಡು ಹಿಡಿಯಲು ಧರ್ಮಸ್ಥಳ ಮಂಜುನಾಥನ ಮೊರೆ ಹೋಗ್ತಿದ್ದಾರೆ. ಧರ್ಮಸ್ಥಳದಲ್ಲೇ ಶಾಸಕಾಂಗ ಸಭೆ ಆಯೋಜಿಸಿದ್ದು, ತಮ್ಮ ಪಕ್ಷದ ಶಾಸಕರಿಂದ ಆಣೆ ಪ್ರಮಾಣ ಮಾಡಿಸಲು ಬಿಜೆಪಿ ನಾಯಕರು ಮುಂದಾಗಿದೆ ಎಂಬ ಮಾಹಿತಿ ಮೂಲಗಳಿಂದ ತಿಳಿದು ಬಂದಿದೆ

ಬೆಂಗಳೂರು: ಇತ್ತೀಚೆಗೆ ನಡೆದ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ ಶಾಸಕರಿಂದ ‘ಅಡ್ಡ ಮತದಾನ’ (ಕ್ರಾಸ್ ವೋಟಿಂಗ್) ನಡೆದಿದೆ ಎನ್ನಲಾದ ವಿವಾದ ಇದೀಗ ರಾಜ್ಯ ರಾಜಕಾರಣದಲ್ಲಿ ತೀವ್ರ ಸ್ವರೂಪ ಪಡೆದುಕೊಂಡಿದೆ. ಕರಾವಳಿಯ ಶಾಸಕರೊಬ್ಬರ ಮೇಲೆಯೂ ಗುಮಾನಿಯಿದ್ದು, ಅವರೂ ಸೇರಿದಂತೆ ಪಕ್ಷಕ್ಕೆ ದ್ರೋಹ ಬಗೆದವರನ್ನು ಪತ್ತೆಹಚ್ಚಲು ಮತ್ತು ಪಕ್ಷದೊಳಗಿನ ಗೊಂದಲಗಳಿಗೆ ತೆರೆ ಎಳೆಯಲು ಬಿಜೆಪಿ ಹೈಕಮಾಂಡ್ ಹಾಗೂ ರಾಜ್ಯ ನಾಯಕತ್ವ ಮಹತ್ವದ ತೀರ್ಮಾನ ಕೈಗೊಂಡಿದೆ.

ಧರ್ಮಸ್ಥಳದಲ್ಲಿ ಶಾಸಕಾಂಗ ಪಕ್ಷದ ಸಭೆ: ಮುಂದಿನ ರಾಜಕೀಯ ನಡೆ ಹಾಗೂ ಶಾಸಕರಲ್ಲಿ ಒಗ್ಗಟ್ಟು ಮೂಡಿಸುವ ನಿಟ್ಟಿನಲ್ಲಿ ಅತಿ ಶೀಘ್ರದಲ್ಲೇ, ಅಂದರೆ ಇದೇ ಗುರುವಾರ ಅಥವಾ ಶುಕ್ರವಾರದಂದು ಪವಿತ್ರ ಕ್ಷೇತ್ರ ಧರ್ಮಸ್ಥಳದಲ್ಲಿ ಬಿಜೆಪಿ ಶಾಸಕಾಂಗ ಪಕ್ಷದ (BJP Legislative Party) ವಿಶೇಷ ಸಭೆಯನ್ನು ಕರೆಯಲು ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ವೈ. ವಿಜಯೇಂದ್ರ ಮತ್ತು ವಿರೋಧ ಪಕ್ಷದ ನಾಯಕ ಆರ್. ಅಶೋಕ್ ತೀರ್ಮಾನಿಸಿದ್ದಾರೆ.

ಮಂಜುನಾಥನ ಸನ್ನಿಧಿಯಲ್ಲಿ ಆಣೆ-ಪ್ರಮಾಣದ ಬೆದರಿಕೆ: ಅಡ್ಡ ಮತದಾನದ ತೀವ್ರ ಪೇಚಿಗೆ ಸಿಲುಕಿರುವ ಕಮಲ ಪಾಳಯ, ಶಾಸಕರ ಮುಂದೆ ‘ದೇವರ ಆಣೆ’ಯ ಬೆದರಿಕೆಯ ಕತ್ತಿ ತೂಗುಹಾಕಿದೆ. ಧರ್ಮಸ್ಥಳದಲ್ಲಿ ಸಭೆ ಮುಗಿದ ನಂತರ ಪಕ್ಷದ ಎಲ್ಲಾ 63 ಶಾಸಕರಿಂದಲೂ ಶ್ರೀ ಮಂಜುನಾಥ ಸ್ವಾಮಿಯ ಸನ್ನಿಧಿಯಲ್ಲಿ “ನಾವು ಅಡ್ಡ ಮತದಾನ ಮಾಡಿಲ್ಲ” ಎಂದು ಆಣೆ-ಪ್ರಮಾಣ ಮಾಡಿಸಲು ತೆರೆಮರೆಯಲ್ಲಿ ತಂತ್ರ ರೂಪಿಸಲಾಗಿದೆ.

ಕಡ್ಡಾಯ ಹಾಜರಿಗೆ ಅಧಿಕೃತ ‘ವಿಪ್’ ಅಸ್ತ್ರ: ಸಭೆಗೆ ಯಾರೊಬ್ಬರೂ ಗೈರಾಗದಂತೆ ತಡೆಯಲು ಮತ್ತು ಪಕ್ಷದಲ್ಲಿ ಶಿಸ್ತು ಕಾಪಾಡುವ ನಿಟ್ಟಿನಲ್ಲಿ ಎಲ್ಲಾ ಶಾಸಕರಿಗೂ ಅಧಿಕೃತ ‘ವಿಪ್’ ಜಾರಿ ಮಾಡಲು ತೀರ್ಮಾನಿಸಲಾಗಿದೆ. ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಎಲ್ಲಾ ಶಾಸಕರಿಗೂ ವಿಪ್ ಕೊಡುವ ಮೂಲಕ ಸಭೆಗೆ ಕಡ್ಡಾಯವಾಗಿ ಹಾಜರಿರುವಂತೆ ಸೂಚನೆ ನೀಡಲಿದ್ದಾರೆ. ವಿಪ್ ಉಲ್ಲಂಘಿಸುವವರ ವಿರುದ್ಧ ಕಠಿಣ ಕ್ರಮದ ಎಚ್ಚರಿಕೆ ನೀಡಲಾಗಿದೆ.

ದೆಹಲಿಗೆ ಪಯಣ – ಹೈಕಮಾಂಡ್‌ಗೆ ವರದಿ: ಧರ್ಮಸ್ಥಳದ ಆಣೆ-ಪ್ರಮಾಣದ ಪ್ರಕ್ರಿಯೆಗೆ ಚಾಲನೆ ನೀಡುವ ಮುನ್ನ ಬಿ.ವೈ. ವಿಜಯೇಂದ್ರ ಮತ್ತು ಆರ್. ಅಶೋಕ್ ಅವರು ಸೋಮವಾರ ಸಂಜೆ ಜಂಟಿಯಾಗಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಮಂಗಳವಾರ ದೆಹಲಿಯಲ್ಲಿ ರಾಷ್ಟ್ರೀಯ ನಾಯಕರನ್ನು ಭೇಟಿಯಾಗಲಿರುವ ಈ ಜೋಡಿ, ರಾಜ್ಯದಲ್ಲಿ ನಡೆದ ಅಡ್ಡ ಮತದಾನದ ಬೆಳವಣಿಗೆಗಳು, ಅದಕ್ಕೆ ಕಾರಣರಾದ ಶಂಕಿತರು ಮತ್ತು ಅದರ ಹಿಂದಿರುವ ರಾಜಕೀಯ ಕೈವಾಡಗಳ ಬಗ್ಗೆ ಸಂಪೂರ್ಣ ಲಿಖಿತ ಹಾಗೂ ಮೌಖಿಕ ವರದಿಯನ್ನು ಹೈಕಮಾಂಡ್‌ಗೆ ನೀಡಲಿದ್ದಾರೆ. ತದನಂತರ ಹೈಕಮಾಂಡ್ ಗ್ರೀನ್ ಸಿಗ್ನಲ್ ಸಿಗುತ್ತಿದ್ದಂತೆ ಧರ್ಮಸ್ಥಳದಲ್ಲಿ ಅಡ್ಡ ಮತದಾನ ಮಾಡಿದ ಶಾಸಕರ ಪತ್ತೆ ಕಾರ್ಯ ಅಧಿಕೃತವಾಗಿ ಆರಂಭವಾಗಲಿದೆ.

ರಾಜಕೀಯ ಸತ್ಯಶೋಧನೆಗೆ ಧರ್ಮಸ್ಥಳವೇ ಏಕೆ? “ಮಾತು ಬಿಡ ಮಂಜುನಾಥ, ಕಾಸು ಬಿಡ ತಿಮ್ಮಪ್ಪ” ಎನ್ನುವ ಜನಪ್ರಿಯ ಗಾದೆ ಮಾತಿದೆ. ಸಾಮಾನ್ಯವಾಗಿ ಭಕ್ತರು ಅತ್ಯಂತ ಭಕ್ತಿ-ಗೌರವದಿಂದ ಕಾಣುವ ಮಂಜುನಾಥನ ಸನ್ನಿಧಿಯಲ್ಲಿ ಸುಳ್ಳು ಹೇಳಲು ಹೆದರುತ್ತಾರೆ. ಇದೇ ಕಾರಣಕ್ಕೆ ಕ್ರಾಸ್ ವೋಟಿಂಗ್ ಮಾಡಿದವರು ಯಾರು ಎಂಬುದನ್ನು ಶಾಸಕರ ಆತ್ಮಸಾಕ್ಷಿಗೆ ಬಿಟ್ಟು, ದೇವರ ಮುಂದೆ ಸತ್ಯ ಒಪ್ಪಿಸಲು ಈ ತಂತ್ರ ರೂಪಿಸಲಾಗಿದೆ ಎನ್ನಲಾಗಿದೆ.

ಧರ್ಮಸ್ಥಳದಲ್ಲಿ ಆಣೆ-ಪ್ರಮಾಣದ ನಿಯಮಗಳೇನು? ಧರ್ಮಸ್ಥಳದ ಧರ್ಮಾಧಿಕಾರಿ ಡಾ. ಡಿ. ವೀರೇಂದ್ರ ಹೆಗ್ಗಡೆಯವರು ಹಿಂದೆ ಸ್ಪಷ್ಟಪಡಿಸಿರುವ ಪ್ರಕಾರ, ಕ್ಷೇತ್ರದಲ್ಲಿ ಆಣೆ-ಪ್ರಮಾಣ ಮಾಡಲು ಕಠಿಣ ನಿಯಮಗಳಿವೆ:

ಪ್ರಮಾಣ ಮಾಡಲು ಇಚ್ಛಿಸುವವರು ಮುಂಚಿತವಾಗಿಯೇ ದೇವಸ್ಥಾನದ ಆಡಳಿತ ಮಂಡಳಿಗೆ ಮಾಹಿತಿ ನೀಡಬೇಕು.

ನಿಗದಿತ ದಿನದ ಹಿಂದಿನ ದಿನವೇ ಕ್ಷೇತ್ರಕ್ಕೆ ಆಗಮಿಸಬೇಕು.

ಮರುದಿನ ಪವಿತ್ರ ನೇತ್ರಾವತಿ ನದಿಯಲ್ಲಿ ಸ್ನಾನ ಮಾಡಿ, ಖಾಲಿ ಹೊಟ್ಟೆಯಲ್ಲಿ ದೇವರ ಮುಂದೆ ಎರಡೂ ಕಡೆಯವರು ಪ್ರಮಾಣ ಮಾಡಬೇಕಾಗುತ್ತದೆ. ಈ ವೇಳೆ ಕ್ಷೇತ್ರದಲ್ಲಿ ಧರ್ಮಾಧಿಕಾರಿಗಳು ಅಥವಾ ಪಾತ್ರಿಗಳು ಹಾಜರಿರುತ್ತಾರೆ.

ಕರ್ನಾಟಕ ರಾಜಕಾರಣ ಮತ್ತು ಧರ್ಮಸ್ಥಳದ ಆಣೆ-ಪ್ರಮಾಣ ಇತಿಹಾಸ:

ಕರ್ನಾಟಕ ರಾಜಕೀಯದಲ್ಲಿ ರಾಜಕಾರಣಿಗಳು ಧರ್ಮಸ್ಥಳದ ಆಣೆ-ಪ್ರಮಾಣದ ಮೊರೆ ಹೋಗುತ್ತಿರುವುದು ಇದೇ ಮೊದಲೇನಲ್ಲ. ಇದರ ಹಿಂದಿನ ಕೆಲವು ಪ್ರಮುಖ ರೋಚಕ ಇತಿಹಾಸ ಹೀಗಿದೆ:

2011 (ಬಿಎಸ್ವೈ ವಿರುದ್ಧ ಎಚ್‌ಡಿಕೆ): ಬಿ.ಎಸ್. ಯಡಿಯೂರಪ್ಪ ಅವರು ಎರಡನೇ ಬಾರಿ ಸಿಎಂ ಆಗಿದ್ದಾಗ, ಭ್ರಷ್ಟಾಚಾರದ ವಿಚಾರವಾಗಿ ಯಡಿಯೂರಪ್ಪ ಅವರು ರಾಜಿ ಸಂಧಾನಕ್ಕೆ ಯತ್ನಿಸುತ್ತಿದ್ದಾರೆ ಎಂದು ಎಚ್.ಡಿ. ಕುಮಾರಸ್ವಾಮಿ ಆರೋಪಿಸಿದ್ದರು. ಮಾತಿಗೆ ಮಾತು ಬೆಳೆದು ಇಬ್ಬರೂ ಧರ್ಮಸ್ಥಳದಲ್ಲಿ ಆಣೆ-ಪ್ರಮಾಣ ಮಾಡಲು ಸಜ್ಜಾಗಿದ್ದರು. ಇಡೀ ದೇಶವೇ ಇವರತ್ತ ಮುಖ ಮಾಡಿ ನಿಂತಿತ್ತು. ಇಬ್ಬರೂ ನಾಯಕರು ಧರ್ಮಸ್ಥಳಕ್ಕೆ ಬಂದರೂ, ಕೊನೆಗೆ ಆಣೆ-ಪ್ರಮಾಣ ಮಾಡದೆ ವಾಪಸ್ ತೆರಳಿದ್ದರು.

2012 (ವಸಂತ ಬಂಗೇರ ಸವಾಲು): ಮಂಗಳೂರು ಹೋಂಸ್ಟೇ ದಾಳಿ ಪ್ರಕರಣದ ವೇಳೆ ಜಿಲ್ಲೆಯಲ್ಲಿ ಕಲ್ಲಡ್ಕ ಪ್ರಭಾಕರ್ ಭಟ್ ಅವರ ಅಣತಿಯಂತೆ ಎಲ್ಲವೂ ನಡೆಯುತ್ತಿದೆ ಎಂದು ಬೆಳ್ತಂಗಡಿಯ ಅಂದಿನ ಕಾಂಗ್ರೆಸ್ ಶಾಸಕ ದಿ. ವಸಂತ ಬಂಗೇರ सदनದಲ್ಲಿ ಆರೋಪಿಸಿದ್ದರು. ಇದರಿಂದ ಸಿಟ್ಟಾಗಿದ್ದ ಯಡಿಯೂರಪ್ಪ ಹೆಡ್‌ಸೆಟ್ ನೆಲಕ್ಕೆ ಕುಕ್ಕಿದ್ದರು. ಆಗ ಬಂಗೇರ ಅವರು ಧರ್ಮಸ್ಥಳದಲ್ಲಿ ಪ್ರಮಾಣ ಮಾಡಲು ಸಿದ್ಧ ಎಂದಿದ್ದರು.

2022 (ಶಿವಲಿಂಗೇಗೌಡರ ಪ್ರಮಾಣ): ಅರಸೀಕೆರೆ ಶಾಸಕ ಕೆ.ಎಂ. ಶಿವಲಿಂಗೇಗೌಡರ ಮೇಲೆ ಬಿಜೆಪಿ ಮುಖಂಡರು ‘ರಾಗಿ ಕಳ್ಳ’ ಎಂದು ಆರೋಪಿಸಿದಾಗ ನೊಂದ ಗೌಡರು, ನೇತ್ರಾವತಿಯಲ್ಲಿ ಸ್ನಾನ ಮಾಡಿ ಮಂಜುನಾಥನ ಮುಂದೆ ತಾವು ನಿರಪರಾಧಿ ಎಂದು ಪ್ರಮಾಣ ಮಾಡಿ, ಬಳಿಕ ವೀರೇಂದ್ರ ಹೆಗ್ಗಡೆಯವರ ಆಶೀರ್ವಾದ ಪಡೆದಿದ್ದರು.

2023 (ವರ್ಗಾವಣೆ ದಂಧೆ ಸವಾಲು): ಸಿದ್ದರಾಮಯ್ಯ ಸರ್ಕಾರದಲ್ಲಿ ವರ್ಗಾವಣೆ ದಂಧೆ ನಡೆಯುತ್ತಿದೆ ಎಂದು ಆರೋಪಿಸಿದ್ದ ಕುಮಾರಸ್ವಾಮಿ, ಶಾಸಕ ಎಚ್.ಸಿ. ಬಾಲಕೃಷ್ಣ, ಸಿಎಂ ಸಿದ್ದರಾಮಯ್ಯ ಹಾಗೂ ಯತೀಂದ್ರ ಸಿದ್ದರಾಮಯ್ಯ ಅವರು ಧರ್ಮಸ್ಥಳದಲ್ಲಿ ಬಂದು ಆಣೆ ಮಾಡಲಿ ಎಂದು ಸವಾಲು ಹಾಕಿದ್ದರು.

ಮುಡಾ ಹಗರಣದ ಸವಾಲು: ಮುಡಾ ಕಚೇರಿಯಿಂದ ಯಾವುದೇ ದಾಖಲೆ ಕದ್ದಿಲ್ಲ ಎಂದು ಸ್ಪಷ್ಟಪಡಿಸಲು ನಗರಾಭಿವೃದ್ಧಿ ಸಚಿವ ಬೈರತಿ ಸುರೇಶ್ ಅವರು ಕುಮಾರಸ್ವಾಮಿ ಮತ್ತು ಛಲವಾದಿ ನಾರಾಯಣಸ್ವಾಮಿ ಅವರಿಗೆ ಚಾಮುಂಡೇಶ್ವರಿ ಅಥವಾ ಧರ್ಮಸ್ಥಳಕ್ಕೆ ಬಂದು ಪ್ರಮಾಣ ಮಾಡಲು ಇತ್ತೀಚೆಗೆ ಓಪನ್ ಚಾಲೆಂಜ್ ಹಾಕಿದ್ದರು.

ಈಗ ಬಿಜೆಪಿಗೆ ಕ್ರಾಸ್ ವೋಟಿಂಗ್ ತಲೆಬಿಸಿ: ಸದ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಪಕ್ಷದ ವತಿಯಿಂದ ಕ್ರಾಸ್ ವೋಟಿಂಗ್ ತನಿಖೆಗೆ ಸಮಿತಿ ರಚಿಸಲಾಗಿದ್ದರೂ, ನಿಖರ ಮಾಹಿತಿ ಸಿಗುತ್ತಿಲ್ಲ. ಈ ಹಿನ್ನೆಲೆಯಲ್ಲಿ ಹೈಕಮಾಂಡ್‌ಗೆ ಉತ್ತರಿಸಬೇಕಾದ ಅನಿವಾರ್ಯತೆಯಲ್ಲಿರುವ ರಾಜ್ಯ ಬಿಜೆಪಿ ನಾಯಕರು, ಶಾಸಕರನ್ನು ಧರ್ಮಸ್ಥಳಕ್ಕೆ ಕರೆದೊಯ್ದು ಮಂಜುನಾಥನ ಸಾಕ್ಷಿಯಾಗಿ ಶಾಸಕಾಂಗ ಸಭೆ ನಡೆಸಿ, ಆಣೆ-ಪ್ರಮಾಣದ ಮೂಲಕ ʼಗೆರೆ ದಾಟಿದವರು ಯಾರು’ ಎಂಬುದನ್ನು ಪತ್ತೆ ಹಚ್ಚಲು ಮುಂದಾಗಿದ್ದಾರೆ. ರಾಜಕೀಯ ಇತಿಹಾಸದ ಈ ಹೊಸ ಆಣೆ-ಪ್ರಮಾಣದ ಹೈಡ್ರಾಮಾ ಎಲ್ಲಿಗೆ ಬಂದು ನಿಲ್ಲುತ್ತದೆ ಎಂಬುದನ್ನು ಕಾದುನೋಡಬೇಕಿದೆ.




ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

Belthangady

ಬೆಳ್ತಂಗಡಿ: ಮನೆಗೆ ನುಗ್ಗಿ 15.82 ಲಕ್ಷ ಮೌಲ್ಯದ ಚಿನ್ನಾಭರಣ, ನಗದು ಕಳವು – ಕಾರ್ಮಿಕರ ಮೇಲೆ ಅನುಮಾನ

Published

on

ಬೆಳ್ತಂಗಡಿ: ಮನೆಯವರು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ತೆರಳಿದ್ದ ವೇಳೆ ಮನೆಗೆ ನುಗ್ಗಿದ ಕಳ್ಳರು ಸುಮಾರು 15.82 ಲಕ್ಷ ರೂ. ಮೌಲ್ಯದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವು ಮಾಡಿರುವ ಘಟನೆ ಬೆಳ್ತಂಗಡಿ ತಾಲೂಕಿನ ಕುವೆಟ್ಟು ಗ್ರಾಮದ ಆಲಂದಿಲದಲ್ಲಿ ನಡೆದಿದೆ.

ಆಲಂದಿಲ ನಿವಾಸಿ ನೌಫಾಲ್ ಬಿ.ಎಂ. (34) ಎಂಬವರು ಈ ಬಗ್ಗೆ ದೂರು ನೀಡಿದ್ದಾರೆ.

ಘಟನೆಯ ವಿವರ:
ಅವರು ನೀಡಿದ ದೂರಿನಂತೆ ಸೆ. 13 ರಂದು ಮಧ್ಯಾಹ್ನ ಸುಮಾರು 1.45ಕ್ಕೆ ಪತ್ನಿ, ಮಕ್ಕಳು ಹಾಗೂ ತಾಯಿಯನ್ನು ಸಂಬಂಧಿಕರ ಗೃಹಪ್ರವೇಶ ಕಾರ್ಯಕ್ರಮಕ್ಕೆ ಗುರುವಾಯನಕೆರೆಗೆ ಕಳುಹಿಸಿದ ಬಳಿಕ ನೌಫಾಲ್ ಕೂಡ ಮನೆಗೆ ಬೀಗ ಹಾಕಿ ತರಕಾರಿ ವ್ಯಾಪಾರದ ಕೆಲಸಕ್ಕಾಗಿ ಬೆಳ್ತಂಗಡಿಗೆ ತೆರಳಿದ್ದರು.

ಸೆ.14 ರಂದು ಫಾಲ್ಸ್ ಸೀಲಿಂಗ್ ವೈರಿಂಗ್ ಕೆಲಸಕ್ಕಾಗಿ ಕಾರ್ಮಿಕರನ್ನು ಮನೆಗೆ ಕರೆಸಲಾಗಿತ್ತು. ಮದ್ದಡ್ಕದ ಫಾರೂಕ್ ಎಂಬವರು ಕುದ್ರಡ್ಕದ ಅಶ್ರಫ್ ಹಾಗೂ ಶಿರ್ಲಾಲಿನ ಸುಲೈಮಾನ್ ಅವರನ್ನು ಕರೆದುಕೊಂಡು ಬಂದು ಮನೆಯಲ್ಲಿ ಕೆಲಸ ಮಾಡಿದ್ದರು. ಈ ವೇಳೆ ನೌಫಾಲ್ ಅವರ ತಮ್ಮ ಮಹಮ್ಮದ್ ನೌಷಾದ್ ಮನೆಯಲ್ಲಿದ್ದರು.

ಅದೇ ದಿನ ರಾತ್ರಿ ಸುಮಾರು 8.30ಕ್ಕೆ ನೌಫಾಲ್ ಕುಟುಂಬದೊಂದಿಗೆ ಮನೆಗೆ ವಾಪಸ್ ಬಂದಾಗ, ಬೆಡ್‌ರೂಂನ ಗೋದ್ರೇಜ್‌ನಲ್ಲಿ ಇಟ್ಟಿದ್ದ ಚಿನ್ನದ ಬಾಕ್ಸ್ ಕಾಣೆಯಾಗಿರುವುದು ಗಮನಕ್ಕೆ ಬಂದಿದೆ.

ಪರಿಶೀಲನೆ ನಡೆಸಿದಾಗ 32 ಗ್ರಾಂ ಮತ್ತು 26 ಗ್ರಾಂ ತೂಕದ ಎರಡು ಚಿನ್ನದ ಸರಗಳು, ಮಗುವಿನ ಚಿನ್ನದ ಸರ, ಕಾಲುಚೈನು, ಬ್ರೇಸ್ಲೆಟ್ ಸೇರಿದಂತೆ 15 ಲಕ್ಷ 82 ಸಾವಿರ ರೂ. ಮೌಲ್ಯದ ಒಟ್ಟು 113 ಗ್ರಾಂ ತೂಕದ ಚಿನ್ನಾಭರಣ ಹಾಗೂ 1.80 ಲಕ್ಷ ರೂ. ನಗದು ಕಳವಾಗಿರುವುದು ಬೆಳಕಿಗೆ ಬಂದಿದೆ.

ಇದಲ್ಲದೆ ನೌಫಾಲ್ ಅವರ ತಾಯಿಯ ಗೋದ್ರೇಜ್‌ನಲ್ಲಿದ್ದ ಒಟ್ಟು 7 ಗ್ರಾಂ ತೂಕದ ಮೂರು ಉಂಗುರಗಳೂ ಕಾಣೆಯಾಗಿರುವುದು ಪತ್ತೆಯಾಗಿದೆ.

ಮನೆಯ ಗೋದ್ರೇಜ್‌ನ ಕೀ ಗೋದ್ರೇಜ್‌ನಲ್ಲಿಯೇ ಇದ್ದು, ಮನೆಯವರು ಹೊರಗಿದ್ದ ಅವಧಿಯಲ್ಲಿ ಯಾರೋ ಮನೆಗೆ ಪ್ರವೇಶಿಸಿ ಗೋದ್ರೇಜ್ ತೆರೆದು ಕಳವು ಮಾಡಿರುವ ಬಗ್ಗೆ ದೂರಿನಲ್ಲಿ ತಿಳಿಸಲಾಗಿದೆ.

ವೈರಿಂಗ್ ಕೆಲಸಕ್ಕೆ ಬಂದಿದ್ದ ಅಶ್ರಫ್, ಫಾರೂಕ್ ಹಾಗೂ ಸುಲೈಮಾನ್ ಅವರ ಮೇಲೆ ಅನುಮಾನವಿರುವುದಾಗಿ ನೌಫಾಲ್ ದೂರಿನಲ್ಲಿ ತಿಳಿಸಿದ್ದಾರೆ.

ಈ ಬಗ್ಗೆ ಬೆಳ್ತಂಗಡಿ ಪೊಲೀಸ್ ಠಾಣೆಯಲ್ಲಿ ಸೆ.15 ರಂದು ಕಲಂ 331(3), 331(4), 305 BNS-2023 ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Continue Reading

arrest

ಬೆಳ್ತಂಗಡಿ: ದಲಿತ ಕುಟುಂಬದ ಜಮೀನಿಗೆ ಅಕ್ರಮ ಪ್ರವೇಶಿಸಿ ಅಶ್ಲೀಲ ಪ್ರದರ್ಶನ – ಆರೋಪಿ ಬಂಧನ

Published

on

ಬೆಳ್ತಂಗಡಿ: ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದಲ್ಲಿ ಪರಿಶಿಷ್ಟ ಜಾತಿಯ ಕುಟುಂಬಗಳಿಗೆ ಸೇರಿದ ಜಮೀನಿಗೆ ಅಕ್ರಮ ಪ್ರವೇಶಿಸಿ ಕೃತ್ಯವೆಸಗಿ, ದಲಿತ ಕುಟುಂಬದ ಮಹಿಳೆಯರ ಮುಂದೆ ಪಂಚೆ ಎತ್ತಿ ಮರ್ಮಾಂಗ ಪ್ರದರ್ಶಿಸಿ ವಿಕೃತಿ ಮೆರೆದ ವಿಲಕ್ಷಣ ಪ್ರಕರಣ ನಡೆದಿದ್ದು, ಈ ಬಗ್ಗೆ ವೇಣೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಯನ್ನು ಬೆಳ್ತಂಗಡಿ ತಾಲೂಕಿನ ಹೊಸಂಗಡಿ ಗ್ರಾಮದ ಪಟ್ಟಾಡಿ ಮನೆಯ ಅಬ್ದುಲ್ ಹನೀಫ್ ಹುಸೇನ್ (50) ಎಂದು ಗುರುತಿಸಲಾಗಿದೆ.

ಘಟನೆ ವಿವರ:

ಬೆಳ್ತಂಗಡಿ ತಾಲೂಕಿನ ವೇಣೂರು ಸಮೀಪದ ಪಡ್ಯಾರಬೆಟ್ಟು ಎಂಬಲ್ಲಿ ಸುಮಾರು 40 ವರ್ಷಗಳಿಗಿಂತಲೂ ಹೆಚ್ಚು ಕಾಲದಿಂದ ವಾಸ್ತವ್ಯವಿದ್ದು ಕೃಷಿ ಚಟುವಟಿಕೆ ನಡೆಸಿಕೊಂಡು ಬರುತ್ತಿದ್ದ ಪರಿಶಿಷ್ಟ ಜಾತಿಯ ಕುಟುಂಬದ ಸ್ವಾಧೀನದ ಜಾಗದಲ್ಲಿ ಸಿಮೆಂಟ್ ಕಂಬ ಹಾಗೂ ತಂತಿ ಬೇಲಿ ಹಾಕಿ ಕುಟುಂಬ ಕೃಷಿ ಕಾರ್ಯದಲ್ಲಿ ತೊಡಗಿತ್ತು.

ಸೆ.7 ರಂದು ಸ್ಥಳೀಯ ನಿವಾಸಿ ಹನೀಫ್ ಎಂಬಾತ ಏಕಾಏಕಿ ಆ ಜಾಗಕ್ಕೆ ಅತಿಕ್ರಮ ಪ್ರವೇಶಿಸಿ, ಜಾತಿ ನಿಂದನೆ ಮಾಡಿ ಅವಾಚ್ಯ ಮತ್ತು ಅಶ್ಲೀಲ ಪದಗಳಿಂದ ನಿಂದಿಸಿದ್ದಾನೆ. ಬಡ ಕುಟುಂಬ ಹಾಕಿದ್ದ ಸಿಮೆಂಟ್ ಬೇಲಿ ಕಂಬ ಹಾಗೂ ತಂತಿ ಬೇಲಿಯನ್ನು ಕಿತ್ತೆಸೆದು, ಅಡಿಕೆ ಹಾಗೂ ಬಾಳೆ ಗಿಡಗಳನ್ನು ಮುರಿದು ದಾಂಧಲೆ ನಡೆಸಿ ಕೊಲೆ ಬೆದರಿಕೆ ಹಾಕಿದ್ದಾನೆ ಎಂದು ಆರೋಪಿಸಲಾಗಿದೆ.

ಈ ವೇಳೆ ಕೆಲಸದಲ್ಲಿ ತೊಡಗಿದ್ದ ದಲಿತ ಕುಟುಂಬದ ಮಹಿಳೆಯರು ದಾಂಧಲೆಯ ಘಟನೆಯನ್ನು ತಮ್ಮ ಮೊಬೈಲ್‌ನಲ್ಲಿ ವಿಡಿಯೋ ಚಿತ್ರೀಕರಣ ಮಾಡುತ್ತಿದ್ದಾಗ ಆರೋಪಿ ಹನೀಫ್ ಮಹಿಳೆಯರ ಎದುರು ಬಂದು ತಾನು ಉಟ್ಟಿದ್ದ ಪಂಚೆಯನ್ನು ಎತ್ತಿ ಒಳ ಉಡುಪನ್ನು ಜಾರಿಸಿ ತನ್ನ ಗುಪ್ತಾಂಗವನ್ನು ತೋರಿಸುತ್ತಾ ಸಾರ್ವಜನಿಕವಾಗಿ ವಿಕೃತಿಯನ್ನು ಮೆರೆದಿದ್ದಾನೆ. “ನಿಮ್ಮನ್ನು ಇದರಿಂದಲೇ ಅತ್ಯಾಚಾರ ಮಾಡುತ್ತೇನೆ, ಈ ಜಾಗ ಬಿಟ್ಟು ಹೋಗದಿದ್ದರೆ ನಿಮ್ಮನ್ನು ಕೊಲ್ಲದೆ ಬಿಡುವುದಿಲ್ಲ” ಎಂದು ಬೆದರಿಕೆ ಹಾಕಿ ಮಹಿಳೆಯರನ್ನು ಬೆನ್ನಟ್ಟಿಕೊಂಡು ಬಂದಿದ್ದಾನೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ದೂರು ಮತ್ತು ಬಂಧನ:

ಈತನ ವಿಕೃತಿಯಿಂದ ಭಯಗೊಂಡ ಬಡ ಕುಟುಂಬವು ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ವೇಣೂರು ಪೊಲೀಸ್ ಠಾಣೆಗೆ ತೆರಳಿ ವಿಡಿಯೋ ಚಿತ್ರೀಕರಣದ ದೃಶ್ಯಾವಳಿ ಸಾಕ್ಷ್ಯಾಧಾರಗಳೊಂದಿಗೆ ಸೆ.8 ರಂದು ದೂರು ನೀಡಿದೆ.

ದೂರಿನ ಅನ್ವಯ ವೇಣೂರು ಠಾಣೆಯಲ್ಲಿ ದಲಿತ ದೌರ್ಜನ್ಯ ಕಾಯ್ದೆ ಅಡಿಯಲ್ಲಿ ಹಾಗೂ ಬಿಎನ್ಎಸ್ 329(3), 352, 351(2), 75(1), 324(4) ರಂತೆ ಪ್ರಕರಣ ದಾಖಲಿಸಲಾಗಿದೆ.

ಪ್ರಕರಣ ದಾಖಲಿಸಿಕೊಂಡ ವೇಣೂರು ಪೊಲೀಸರು ಆರೋಪಿಯನ್ನು ಸಂಜೆ ಬಂಧಿಸಿ ಮಂಗಳೂರು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯ ಆರೋಪಿಗೆ ನ್ಯಾಯಾಂಗ ಬಂಧನ ವಿಧಿಸಿದೆ.

40 ವರ್ಷಗಳಿಂದ ಕೃಷಿ ಮಾಡಿಕೊಂಡು ಬಂದಿದ್ದ ಬಡ ಪರಿಶಿಷ್ಟ ಕುಟುಂಬದ ಮೇಲೆ ದೌರ್ಜನ್ಯ ನಡೆಸಿ, ಮಹಿಳೆಯರ ಮುಂದೆ ಅಸಭ್ಯವಾಗಿ ವರ್ತಿಸಿದ ಆರೋಪಿಗೆ ಸ್ಥಳೀಯ ದಲಿತ ಮುಖಂಡರು ಹಾಗೂ ಕಾರ್ಯಕರ್ತರ ಸಂಘಟಿತ ಹೋರಾಟದ ಫಲವಾಗಿ ಕಾನೂನಿನ ತಕ್ಕ ಪಾಠ ಕಲಿಸಿದಂತಾಗಿದ್ದು, ಈ ಹೋರಾಟಕ್ಕೆ ರಾಜ್ಯಾದ್ಯಂತ ಮೆಚ್ಚುಗೆ ವ್ಯಕ್ತವಾಗಿದೆ.

Continue Reading

accident

ಬೆಳ್ತಂಗಡಿ: ಕಾರು ಹಾಗೂ ಕೆಎಸ್‌ಆರ್‌ಟಿಸಿ ಬಸ್ ನಡುವೆ ಭೀಕರ ಅಪಘಾತ; ಕಾರು ಚಾಲಕನಿಗೆ ಗಂಭೀರ ಗಾಯ

Published

on

ಕೊಕ್ಕಡ: ಧರ್ಮಸ್ಥಳದಿಂದ ಬೆಂಗಳೂರು ಕಡೆಗೆ ಹೋಗುತ್ತಿದ್ದ ಕಾರು ಹಾಗೂ ಸುಬ್ರಹ್ಮಣ್ಯದಿಂದ ಧರ್ಮಸ್ಥಳದ ಕಡೆಗೆ ಬರುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್ ಮುಖಾಮುಖಿ ಡಿಕ್ಕಿಯಾದ ಪರಿಣಾಮ, ಕಾರು ಹಾಗೂ ಬಸ್ಸಿನ ಮುಂಭಾಗ ಸಂಪೂರ್ಣ ನುಜ್ಜುಗುಜ್ಜಾಗಿರುವ ಘಟನೆ ಸೆ. 12ರ ಶನಿವಾರ ಕೊಕ್ಕಡ ಸಮೀಪ ರಾಷ್ಟ್ರೀಯ ಹೆದ್ದಾರಿಯಲ್ಲಿ ಸಂಭವಿಸಿದೆ.

ಅಪಘಾತದ ತೀವ್ರತೆಗೆ ಬಸ್ಸಿನಲ್ಲಿದ್ದ ಮೂವರು ಪ್ರಯಾಣಿಕರು ಹಾಗೂ ಕಾರಿನಲ್ಲಿದ್ದ ಹಲವರು ಗಾಯಗೊಂಡಿದ್ದು, ಈ ವೇಳೆ ಕಾರು ಚಾಲಕನ ಕೈ ಮುರಿತವಾಗಿದೆ ಎಂದು ತಿಳಿದುಬಂದಿದೆ. ಗಾಯಾಳುಗಳನ್ನು ತಕ್ಷಣವೇ ಸ್ಥಳೀಯ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ.

ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Continue Reading

Trending

Copyright © 2025 Deevatige

error: Content is protected !!