accident
ವಿಟ್ಲ ಬೊಬ್ಬೆಕೇರಿ ರಸ್ತೆ ಕಾಮಗಾರಿ ಯಡವಟ್ಟು: ಮೃತ್ಯುಕೂಪವಾಗಿ ಬದಲಾದ ಮಾರ್ಗ, ಸಾರ್ವಜನಿಕರ ಆಕ್ರೋಶ!
ವಿಟ್ಲ: ಕಳೆದ ಎರಡು ವಾರಗಳಿಂದ ವಿಟ್ಲದ ಬೊಬ್ಬೆಕೇರಿಯಲ್ಲಿ ನಡೆಯುತ್ತಿರುವ ರಸ್ತೆ ಕಾಮಗಾರಿಯು ಸಾರ್ವಜನಿಕರ ಪಾಲಿಗೆ ಸಂಕಷ್ಟ ತಂದಿಟ್ಟಿದೆ. ಜಿಲ್ಲಾಧಿಕಾರಿಗಳ ಆದೇಶದಂತೆ ಈ ಮಾರ್ಗವನ್ನು ಏಕಮುಖ ರಸ್ತೆಯನ್ನಾಗಿ ಮಾಡಲಾಗಿದ್ದರೂ, ಗುತ್ತಿಗೆದಾರರು ಹಾಗೂ ಇಂಜಿನಿಯರ್ಗಳ ಬೇಜವಾಬ್ದಾರಿತನದಿಂದಾಗಿ ಇಡೀ ರಸ್ತೆ ಅಪಾಯದ ಗೂಡಾಗಿ ಪರಿವರ್ತನೆಯಾಗಿದೆ. ರಸ್ತೆಯ ಮಧ್ಯೆ ಸುಮಾರು 7 ಅಡಿ ಆಳದ ಬೃಹತ್ ಗುಂಡಿಗಳು ನಿರ್ಮಾಣವಾಗಿದ್ದು, ಸಂಚಾರ ದುಸ್ತರವಾಗಿದೆ.

ಸಾಲು ಸಾಲು ಅವಘಡಗಳು: ಶಾಲಾ ವಾಹನ, ಲಾರಿ ಗುಂಡಿಗೆ!
ರಸ್ತೆಯ ದುಸ್ಥಿತಿಯ ಬಗ್ಗೆ ವಾಹನ ಚಾಲಕರು ಮತ್ತು ಸಾರ್ವಜನಿಕರು ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರಶ್ನಿಸಿದರೆ ಉಡಾಫೆಯ ಉತ್ತರ ಸಿಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸಿದ್ದಾರೆ. ಇದೇ ಕಾರಣಕ್ಕೆ ಶಾಲಾ ವಾಹನಗಳು ಹಾಗೂ ಇತರೆ ಚಾಲಕರಿಗೆ ಜಾಗರೂಕರಾಗಿರುವಂತೆ ಮೊದಲೇ ಮನವಿ ಮಾಡಲಾಗಿತ್ತು. ಈಗಾಗಲೇ ಎರಡು-ಮೂರು ಆಟೋ ರಿಕ್ಷಾಗಳು ಹಾಗೂ ಹಲವಾರು ದ್ವಿಚಕ್ರ ವಾಹನಗಳು ಈ ಗುಂಡಿಗಳಿಗೆ ಬಿದ್ದು ಅಪಾಯದಿಂದ ಪಾರಾಗಿದ್ದವು.

ಇಂದು (25.06.2026) ಬೆಳಿಗ್ಗೆ ಭೀಕರ ಅವಘಡವೊಂದು ಸಂಭವಿಸಿದೆ:
ಶಾಲಾ ವಾಹನಕ್ಕೆ ಕುತ್ತು: ಬೆಳಿಗ್ಗೆ ಶಾಲಾ ಮಕ್ಕಳಿದ್ದ ವಾಹನವೊಂದು ಇದೇ 7 ಅಡಿ ಆಳದ ಗುಂಡಿಗೆ ಬಿದ್ದಿದ್ದು, ತಕ್ಷಣವೇ ಸ್ಥಳೀಯ ಸಾರ್ವಜನಿಕರು ಜಂಟಿಯಾಗಿ ಕಾರ್ಯಾಚರಣೆ ನಡೆಸಿ ವಾಹನವನ್ನು ಮೇಲಕ್ಕೆತ್ತಿದ್ದಾರೆ.
ಸಿಲುಕಿಕೊಂಡ ಕಲ್ಲು ಸಾಗಾಟದ ಲಾರಿ: ಶಾಲಾ ವಾಹನವನ್ನು ಎತ್ತಿದ ಕೆಲವೇ ಕ್ಷಣಗಳಲ್ಲಿ ಅದೇ ಗುಂಡಿಗೆ ಕಲ್ಲು ಸಾಗಿಸುತ್ತಿದ್ದ ಭಾರಿ ಗಾತ್ರದ ಲಾರಿಯೊಂದು ಬಿದ್ದು ಹೂತುಹೋಗಿದೆ. ಪರಿಣಾಮವಾಗಿ ಇಡೀ ಮಾರ್ಗ ಸಂಪೂರ್ಣವಾಗಿ ಬಂದ್ ಆಗಿದ್ದು, ಸಂಚಾರ ವ್ಯವಸ್ಥೆ ಸ್ತಬ್ಧಗೊಂಡಿದೆ. ಪ್ರಸ್ತುತ ಕ್ರೇನ್ ಮೂಲಕ ಲಾರಿಯನ್ನು ಹೊರತೆಗೆಯುವ ಕೆಲಸ ಭರದಿಂದ ಸಾಗುತ್ತಿದೆ.
ಕಳೆದ 3 ದಿನಗಳಲ್ಲಿ 12 ಕ್ಕೂ ಹೆಚ್ಚು ವಾಹನಗಳು ಇದೇ ಮೃತ್ಯುಕೂಪಕ್ಕೆ ಬಿದ್ದು ಭಾರಿ ಅಪಾಯದಿಂದ ಪಾರಾಗಿವೆ ಎಂದು ಸ್ಥಳೀಯರು ದೀವಟಿಗೆ ಮೀಡಿಯಾ ಮುಂದೆ ಆಕ್ರೋಶ ಹೊರಹಾಕಿದ್ದಾರೆ.
ರೋಲರ್ ಇಟ್ಟು ಕಳಪೆ ಮಾರ್ಗಕ್ಕೆ ವಾಹನ ಡೈವರ್ಷನ್!
ಕಳೆದ ಎರಡು ವಾರಗಳಿಂದ ನಡೆಯುತ್ತಿರುವ ಕಾಮಗಾರಿಯಲ್ಲಿ ರಸ್ತೆಯ ಒಂದು ಬದಿಯನ್ನು ಜಲ್ಲಿ ಹಾಗೂ ಬೋಲ್ಡರ್ಸ್ ಹಾಕಿ ಗಟ್ಟಿ ಮಾಡಲಾಗಿತ್ತು ಮತ್ತು ಸಂಚಾರಕ್ಕೆ ಮುಕ್ತಗೊಳಿಸಲಾಗಿತ್ತು. ಆದರೆ, ಏಕಾಏಕಿ ಆ ಸುಸ್ಥಿತಿಯಲ್ಲಿದ್ದ ರಸ್ತೆಯ ಮಧ್ಯೆ ರೋಲರ್ ಯಂತ್ರವನ್ನು ಅಡ್ಡಲಾಗಿ ಇಟ್ಟು, ವಾಹನಗಳು ಕಡ್ಡಾಯವಾಗಿ ಕಳಪೆ ಹಾಗೂ ಅಪಾಯಕಾರಿ ಮಾರ್ಗದಲ್ಲೇ ಚಲಿಸುವಂತೆ ಮಾಡಲಾಗಿದೆ. ಈ ಅವೈಜ್ಞಾನಿಕ ಕ್ರಮವೇ ಇಂದಿನ ಸಾಲು ಸಾಲು ಅವಘಡಗಳಿಗೆ ನೇರ ಕಾರಣವಾಗಿದೆ. ಕಳೆದ ಎರಡು ದಿನಗಳಿಂದ ಇಲ್ಲಿ ಯಾವುದೇ ಕಾಮಗಾರಿ ನಡೆಯುತ್ತಿಲ್ಲ ವಾಹನ ಚಾಲಕರ ನರಳಾಟವನ್ನು ಕೇಳುವವರೇ ಇಲ್ಲವಾಗಿದೆ.
ರಾಜಕಾಲುವೆ ಒತ್ತುವರಿ: ಅಧಿಕಾರಿಗಳ ಶಾಮೀಲು ಆರೋಪ?
ಕೇವಲ 100 ಮೀಟರ್ ರಸ್ತೆ ಕಾಮಗಾರಿ ನಡೆಸಲು ಬರೋಬ್ಬರಿ 3 ತಿಂಗಳು ಕಾಲಾವಕಾಶ ತಗೆದುಕೊಳ್ಳಲಾಗಿದ್ದು, ಮುಂಗಾರು ಮಳೆಯ ಈ ಸಂದರ್ಭದಲ್ಲಿ ಇಂತಹ ಕಾಮಗಾರಿ ನಡೆಸುವುದು ಎಷ್ಟು ಸೂಕ್ತ ಎಂಬ ಪ್ರಶ್ನೆ ಎದ್ದಿದೆ.
ಇದಕ್ಕೆ ಮುಖ್ಯ ಕಾರಣ ಅಲ್ಲಿ ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದಿರುವುದು:

ರಾಜಕಾಲುವೆ ಬಂದ್: ಕರ್ನಾಟಕ ಬ್ಯಾಂಕ್ ಮತ್ತು ಹಿಂಭಾಗದ ತೋಟದ ಮೂಲಕ ಹರಿದು ಹೋಗುತ್ತಿದ್ದ ನೀರಿಗಾಗಿ ರಸ್ತೆಯ ಅಡಿಯಲ್ಲಿ ಹಾಕಲಾಗಿದ್ದ ಕಾಂಕ್ರೀಟ್ ಮೋರಿ (ರಾಜಕಾಲುವೆ) ಯನ್ನು ಖಾಸಗಿ ವ್ಯಕ್ತಿಯೊಬ್ಬರು ಸಂಪೂರ್ಣವಾಗಿ ಮುಚ್ಚಿದ್ದಾರೆ.

ತೋಟಗಳು ಜಲಾವೃತ: ರಾಜಕಾಲುವೆ ಮುಚ್ಚಿದ ಕಾರಣ ನೀರು ಸರಾಗವಾಗಿ ಹರಿದು ಹೋಗದೆ ಇಡೀ ತೋಟಗಳು ಮುಳುಗಡೆಯಾಗಿವೆ. ಈ ಅಕ್ರಮಕ್ಕೆ ಅಧಿಕಾರಿಗಳು ಕೂಡ ಶಾಮೀಲಾಗಿದ್ದಾರೆ ಎಂದು ಸಾರ್ವಜನಿಕರು ಗಂಭೀರ ಆರೋಪ ಮಾಡಿದ್ದಾರೆ. ರಾಜಕಾಲುವೆಯನ್ನು ತಕ್ಷಣ ತೆರವುಗೊಳಿಸದಿದ್ದರೆ ರಸ್ತೆ ಕಾಮಗಾರಿ ಮುಗಿದರೂ ಸಮಸ್ಯೆ ಮುಂದುವರಿಯಲಿದೆ.
ಸಾರ್ವಜನಿಕರಿಂದ ರಾತ್ರಿ ಕಾಮಗಾರಿ ಬಂದ್ ಮಾಡುವ ಎಚ್ಚರಿಕೆ!
ಪ್ರತಿದಿನ ರಾತ್ರಿ ವೇಳೆ ಕೆಲಸ ನಿರ್ವಹಿಸುವ ಕಾಮಗಾರಿಯ ಸಿಬ್ಬಂದಿಗಳು ಸಾರ್ವಜನಿಕರ ಯಾವುದೇ ಪ್ರಶ್ನೆಗಳಿಗೂ ಉತ್ತರಿಸುತ್ತಿಲ್ಲ. ಇಂದಿನ ಘಟನೆಯಿಂದ ಕೆರಳಿ ಕೆಂಡವಾಗಿರುವ ಸಾರ್ವಜನಿಕರು ಹಾಗೂ ವಾಹನ ಚಾಲಕರು ಅಧಿಕಾರಿಗಳಿಗೆ ಕಡಕ್ ಎಚ್ಚರಿಕೆ ನೀಡಿದ್ದಾರೆ: “ಇಂದು ಸಂಜೆಯೊಳಗಾಗಿ ಈ ಮೃತ್ಯುಕೂಪಗಳನ್ನು ಮುಚ್ಚಿ ರಸ್ತೆ ಸರಿಪಡಿಸದಿದ್ದರೆ, ರಾತ್ರಿ ಅವಧಿಯಲ್ಲಿ ಮುಂದಕ್ಕೆ ಯಾವುದೇ ಕಾಮಗಾರಿಯನ್ನು ನಡೆಸಲು ಬಿಡುವುದಿಲ್ಲ.”
ಸ್ಥಳೀಯರ ಈ ಆಕ್ರೋಶಕ್ಕೆ ಸಂಬಂಧಪಟ್ಟ ಇಲಾಖೆ ಹಾಗೂ ಜಿಲ್ಲಾಡಳಿತ ತಕ್ಷಣ ಸ್ಪಂದಿಸಿ ಶಾಶ್ವತ ಪರಿಹಾರ ಕಲ್ಪಿಸಬೇಕಿದೆ.



accident
ಪ್ರವಾಸಕ್ಕೆಂದು ಹೊರಟ ಸ್ನೇಹಿತರ ಗುಂಪು ಶವವಾಗಿ ವಾಪಸ್..ಉತ್ತರಾಖಂಡ ಹೆಲಿಕಾಪ್ಟರ್ ಪತನದಲ್ಲಿ ಸಿಸಿಬಿ ಇನ್ಸ್ಪೆಕ್ಟರ್ ದುರಂತ ಅಂತ್ಯ
ಬೆಂಗಳೂರು: ಉತ್ತರಾಖಂಡದ ಜೋಶಿಮಠ ಸಮೀಪ ಸಂಭವಿಸಿದ ಭೀಕರ ಹೆಲಿಕಾಪ್ಟರ್ ಅಪಘಾತದಲ್ಲಿ ಬೆಂಗಳೂರಿನ ಸಿಸಿಬಿ ಇನ್ಸ್ಪೆಕ್ಟರ್ ಸೇರಿದಂತೆ ಐವರು ಕನ್ನಡಿಗರು ಹಾಗೂ ಪೈಲಟ್ ಸೇರಿ ಒಟ್ಟು ಆರು ಮಂದಿ ದುರ್ಮರಣಕ್ಕೀಡಾಗಿದ್ದಾರೆ.
ಕೇದಾರನಾಥ ಮತ್ತು ಬದರಿನಾಥ ದೇವಾಲಯಗಳ ದರ್ಶನಕ್ಕಾಗಿ ಬೆಂಗಳೂರಿನಿಂದ ಪ್ರವಾಸ ಕೈಗೊಂಡಿದ್ದ ಸ್ನೇಹಿತರ ಗುಂಪು ಈ ದುರಂತಕ್ಕೆ ಬಲಿಯಾಗಿದೆ. ಮೃತರನ್ನು ಸಿಸಿಬಿ ಇನ್ಸ್ಪೆಕ್ಟರ್ ಅರುಣ್ ಸಾಲಂಕೆ, ಹೆಚ್.ಎಸ್. ನಾಗರಾಜ್, ಪ್ರತಾಪ್, ಸುಧೀರ್ ಕೆ., ಶಂಕರೇಗೌಡ ಹಾಗೂ ಹೆಲಿಕಾಪ್ಟರ್ ಪೈಲಟ್ ಹಿಮಾಂಶು ಎಂದು ಗುರುತಿಸಲಾಗಿದೆ.
ಘಟನೆಯ ವಿವರ:
ಬೆಂಗಳೂರಿನಿಂದ ಧಾರ್ಮಿಕ ಪ್ರವಾಸಕ್ಕೆ ತೆರಳಿದ್ದ ಈ ಸ್ನೇಹಿತರ ತಂಡ ಕೇದಾರನಾಥ ಮತ್ತು ಬದರಿನಾಥ ದರ್ಶನ ಪೂರೈಸಿ, ಬದರಿನಾಥದಿಂದ ಡೆಹ್ರಾಡೂನ್ನ ಸಹಸ್ರಧಾರಕ್ಕೆ ಟ್ರಾನ್ಸ್ ಭಾರತ್ ಏವಿಯೇಷನ್ಗೆ ಸೇರಿದ ಹೆಲಿಕಾಪ್ಟರ್ನಲ್ಲಿ ಪ್ರಯಾಣಿಸುತ್ತಿತ್ತು. ಮಧ್ಯಾಹ್ನ 1:14 ಕ್ಕೆ ಬದರಿನಾಥದಿಂದ ಟೇಕಾಫ್ ಆದ ಹೆಲಿಕಾಪ್ಟರ್, ಜೋಶಿಮಠ ಕಣಿವೆಯ ಮೇಲೆ ಹಾರಾಟ ನಡೆಸುತ್ತಿದ್ದಾಗ ಏಕಾಏಕಿ ರೇಡಾರ್ ಸಂಪರ್ಕ ಕಳೆದುಕೊಂಡಿದೆ. ಅಲ್ಲದೆ ಹೆಲಿಕಾಪ್ಟರ್ನ ಟ್ರ್ಯಾಕಿಂಗ್ ವ್ಯವಸ್ಥೆಯೂ ಸ್ಥಗಿತಗೊಂಡು, ಕೆಲವೇ ಕ್ಷಣಗಳಲ್ಲಿ ಪತನಗೊಂಡಿದೆ.
ಅಪಘಾತದ ಕುರಿತು ಮಾಹಿತಿ ಪಡೆದ ಉತ್ತರಾಖಂಡ ಪೊಲೀಸರು ಸ್ಥಳಕ್ಕೆ ಧಾವಿಸಿ ಮೃತರ ಗುರುತು ಪತ್ತೆಹಚ್ಚಿದ್ದು, ಕುಟುಂಬಸ್ಥರಿಗೆ ಮಾಹಿತಿ ರವಾನಿಸಿದ್ದಾರೆ. ಪ್ರವಾಸದ ಸಂಭ್ರಮದಲ್ಲಿದ್ದ ಸ್ನೇಹಿತರ ದುರಂತ ಸಾವು ಅವರ ಕುಟುಂಬಸ್ಥರು ಹಾಗೂ ಆಪ್ತರ ವಲಯದಲ್ಲಿ ತೀವ್ರ ಶೋಕವನ್ನುಂಟುಮಾಡಿದೆ.
ತನಿಖೆಗೆ ಆದೇಶ – ಹಾರಾಟ ಸ್ಥಗಿತ:
ಘಟನೆ ಬೆನ್ನಲ್ಲೇ ಮುನ್ನೆಚ್ಚರಿಕೆ ಕ್ರಮವಾಗಿ ಟ್ರಾನ್ಸ್ ಭಾರತ್ ಏವಿಯೇಷನ್ ಸಂಸ್ಥೆಯ ಎಲ್ಲಾ ಹೆಲಿಕಾಪ್ಟರ್ಗಳ ಹಾರಾಟವನ್ನು ತಕ್ಷಣದಿಂದಲೇ ಜಾರಿಗೆ ಬರುವಂತೆ ಸ್ಥಗಿತಗೊಳಿಸಲಾಗಿದೆ ಎಂದು ಉತ್ತರಾಖಂಡ ನಾಗರಿಕ ವಿಮಾನಯಾನ ಅಭಿವೃದ್ಧಿ ಪ್ರಾಧಿಕಾರ (UCADA) ತಿಳಿಸಿದೆ. ಹೆಲಿಕಾಪ್ಟರ್ ಪತನಕ್ಕೆ ನಿಖರ ಕಾರಣವೇನು ಎಂಬುದು ತನಿಖೆಯ ನಂತರವಷ್ಟೇ ತಿಳಿದುಬರಬೇಕಿದೆ
accident
ಕುಂದಾಪುರ: ಬಟ್ಟೆ ಒಗೆಯಲು ತೆರಳಿದ್ದ ಇಬ್ಬರು ಶಾಲಾ ಬಾಲಕಿಯರು ಕೆರೆಗೆ ಬಿದ್ದು ದುರಂತ ಸಾವು
ಕುಂದಾಪುರ: ಬಟ್ಟೆ ತೊಳೆಯಲು ಕೆರೆಗೆ ತೆರಳಿದ್ದ ಇಬ್ಬರು 13 ವರ್ಷದ ಶಾಲಾ ಬಾಲಕಿಯರು ಕಾಲು ಜಾರಿ ಕೆರೆಗೆ ಬಿದ್ದು ಮೃತಪಟ್ಟ ಹೃದಯವಿದ್ರಾವಕ ಘಟನೆ ಹೊಸಾಡು ಗ್ರಾಮದ ಮುಳ್ಳಿಕಟ್ಟೆ ಸಮೀಪದ ಕೊಪ್ಪರಿಗೆ ಗುಡ್ಡೆ ಕಡುಬಿನ ಕೆರೆಯಲ್ಲಿ ಭಾನುವಾರ ಸಂಭವಿಸಿದೆ.
ಮೃತರನ್ನು ಹಾವೇರಿ ಜಿಲ್ಲೆಯ ಶಿಗ್ಗಾಂವ್ ತಾಲೂಕಿನ ಮುದ್ದಿನಕೊಪ್ಪ ಮೂಲದ, ಪ್ರಸ್ತುತ ಮುಳ್ಳಿಕಟ್ಟೆ ಟೆಂಟ್ ಹೌಸ್ನಲ್ಲಿ ವಾಸವಾಗಿದ್ದ ಚಂದ್ರು ಬಸವರಾಜ ವೇಷಗಾರ ಎಂಬುವರ ಪುತ್ರಿ ಸುನೀತಾ (13) ಹಾಗೂ ಅವರ ಸಂಬಂಧಿ ದಿ. ಮಂಜುನಾಥ್ ಅವರ ಪುತ್ರಿ ವೈಶಾಲಿ (13) ಎಂದು ಗುರುತಿಸಲಾಗಿದೆ. ಮೃತ ಬಾಲಕಿಯರಿಬ್ಬರೂ ಹೊಸಾಡಿನ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 7ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದರು.
ಘಟನೆಯ ವಿವರ: ಭಾನುವಾರ ಸಂಜೆ ಟೆಂಟ್ ಹೌಸ್ ನಿವಾಸಿಗಳಾದ 5 ಮಕ್ಕಳು ಬಟ್ಟೆ ತೊಳೆಯಲು ಕೊಪ್ಪರಿಗೆ ಗುಡ್ಡೆಯ ಕಡುಬಿನ ಕೆರೆಗೆ ತೆರಳಿದ್ದರು. ಕೆರೆಯ ದಡದಲ್ಲಿ ಸುನೀತಾ ಹಾಗೂ ವೈಶಾಲಿ ಬಟ್ಟೆ ಒಗೆಯುತ್ತಿದ್ದಾಗ, ಸುನೀತಾ ಆಕಸ್ಮಿಕವಾಗಿ ಕಾಲು ಜಾರಿ ಕೆರೆಗೆ ಬಿದ್ದಿದ್ದಾರೆ. ಈ ವೇಳೆ ಆಕೆಯನ್ನು ರಕ್ಷಿಸಲು ಯತ್ನಿಸಿದ ವೈಶಾಲಿ ಕೂಡ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ.
ಜೊತೆಯಲ್ಲಿದ್ದ ಇತರ ಮಕ್ಕಳು ಕೂಡಲೇ ವಿಷಯ ತಿಳಿಸಿದ್ದು, ಪಾಲಕರು ಹಾಗೂ ಸಂಬಂಧಿಕರು ಸ್ಥಳಕ್ಕೆ ದೌಡಾಯಿಸಿದ್ದಾರೆ. ಬಳಿಕ ಸ್ಥಳೀಯರು ಹಾಗೂ ಮುಳುಗು ತಜ್ಞ ದಿನೇಶ್ ಖಾರ್ವಿ ಅವರ ನೇತೃತ್ವದಲ್ಲಿ ಶೋಧ ಕಾರ್ಯ ನಡೆಸಿ, ಸಂಜೆ 5.15ರ ಅಂದಾಜಿಗೆ ಇಬ್ಬರೂ ಬಾಲಕಿಯರ ಮೃತದೇಹಗಳನ್ನು ಕೆರೆಯಿಂದ ಮೇಲಕ್ಕೆತ್ತಲಾಯಿತು.
ಸ್ಥಳಕ್ಕೆ ಆಗಮಿಸಿದ ಗಂಗೊಳ್ಳಿ ಪೊಲೀಸರು ಶವ ಮಹಜರು ಪ್ರಕ್ರಿಯೆ ನಡೆಸಿದ್ದಾರೆ. ಮೃತ ಸುನೀತಾಳ ತಂದೆ ನೀಡಿದ ದೂರಿನನ್ವಯ ಗಂಗೊಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
accident
ಕೋಟ: ಸೈಕಲ್ಗೆ ಕಾರು ಡಿಕ್ಕಿ – RSS ಮುಖಂಡ ಸ್ಥಳದಲ್ಲೇ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ
ಕೋಟ: ಸೈಕಲ್ಗೆ ಕಾರು ಡಿಕ್ಕಿ – RSS ಮುಖಂಡ ಸ್ಥಳದಲ್ಲೇ ಸಾವು, ಕಾರು ಚಾಲಕನಿಗೆ ಗಂಭೀರ ಗಾಯ
ಕೋಟ: ರಾಷ್ಟ್ರೀಯ ಹೆದ್ದಾರಿ 66ರ ಕೋಟ ಜಂಕ್ಷನ್ನಲ್ಲಿ ಸೋಮವಾರ ಮುಂಜಾನೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಕಾರು ಡಿಕ್ಕಿಯಾದ ಪರಿಣಾಮ ಸೈಕಲ್ ಸವಾರ, ಸ್ಥಳೀಯ RSS ಮುಖಂಡ ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಕಾರು ಚಾಲಕ ತೀವ್ರವಾಗಿ ಗಾಯಗೊಂಡಿದ್ದಾರೆ.
ಕೋಟ ಮಣೂರು ನಿವಾಸಿ, ಆರ್ಎಸ್ಎಸ್ ಮುಖಂಡ ಗುರುದಾಸ್ ಶೆಣೈ ಮೃತಪಟ್ಟವರು. ಕೋಟೇಶ್ವರದ ಬೀಜಾಡಿ ನಿವಾಸಿ ಪ್ರದೀಪ್ ಕಾಂಚನ್ ಗಂಭೀರ ಗಾಯಗೊಂಡ ಕಾರು ಚಾಲಕ ಎಂದು ಗುರುತಿಸಲಾಗಿದೆ.
ಸೋಮವಾರ ಬೆಳಿಗ್ಗೆ ಗುರುದಾಸ್ ಶೆಣೈ ಅವರು ಕೋಟ ಜಂಕ್ಷನ್ ಬಳಿ ಸೈಕಲ್ನಲ್ಲಿ ರಸ್ತೆ ದಾಟುತ್ತಿದ್ದಾಗ, ಉಡುಪಿ ಕಡೆಯಿಂದ ಕುಂದಾಪುರದತ್ತ ಅತಿವೇಗವಾಗಿ ಧಾವಿಸಿ ಬಂದ ಕಾರು ಸೈಕಲ್ಗೆ ನೇರವಾಗಿ ಡಿಕ್ಕಿ ಹೊಡೆದಿದೆ. ಡಿಕ್ಕಿಯ ಭರಕ್ಕೆ ಕಾರು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಇತ್ತ ಸೈಕಲ್ನಿಂದ ರಸ್ತೆಗೆ ಎಸೆಯಲ್ಪಟ್ಟ ಗುರುದಾಸ್ ಶೆಣೈ ಅವರು ಗಂಭೀರ ಗಾಯಗೊಂಡು ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಅಪಘಾತದ ತೀವ್ರತೆಗೆ ಕಾರು ಚಾಲಕ ಪ್ರದೀಪ್ ಕಾಂಚನ್ ಅವರಿಗೂ ತೀವ್ರ ಗಾಯಗಳಾಗಿದ್ದು, ತಕ್ಷಣವೇ ಅವರನ್ನು ಆಂಬುಲೆನ್ಸ್ ಮೂಲಕ ಬ್ರಹ್ಮಾವರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಘಟನೆಗೆ ಸಂಬಂಧಿಸಿದಂತೆ ಕೋಟ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
