arrest
ಬಿ.ಸಿ.ರೋಡ್ ಭೀಕರ ಕೊಲೆ ಪ್ರಕರಣ: ಆರೋಪಿ ಕೊಲೆಗಡುಕ ಪೊಲೀಸ್ ವಶಕ್ಕೆ; ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಸೈಕೋ ಪ್ರೇಮಿ!
ಬಂಟ್ವಾಳ: ನಿನ್ನೆ ಬಿ.ಸಿ.ರೋಡ್ನಲ್ಲಿ ಸಾರ್ವಜನಿಕರು ನೋಡನೋಡುತ್ತಿದ್ದಂತೆಯೇ ಬಸ್ನೊಳಗೆ ನುಗ್ಗಿ ಯುವತಿಯನ್ನು ಬರ್ಬರವಾಗಿ ಕತ್ತಿಯಿಂದ ಕೊಚ್ಚಿ ಕೊಲೆ ಮಾಡಿದ್ದ ಭೀಕರ ಘಟನೆಯ ಆರೋಪಿಯನ್ನು ಪತ್ತೆಹಚ್ಚುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಆದರೆ, ಪೊಲೀಸರ ಕೈಗೆ ಸಿಕ್ಕಿಬೀಳುವ ಭೀತಿಯಿಂದ ಆರೋಪಿ ಇಲಿಪಾಷಾಣ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದು, ಸದ್ಯ ಆತನನ್ನು ತೀವ್ರ ತಪಾಸಣೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳು (SP) ತಿಳಿಸಿದ್ದಾರೆ.
ಘಟನೆಯ ಹಿನ್ನೆಲೆ: ಗುರುವಾರ (ಜುಲೈ 16) ಬಂಟ್ವಾಳದ ಬಿ.ಸಿ.ರೋಡ್ ಜಂಕ್ಷನ್ ಬಳಿ ಈ ರಕ್ತಸಿಕ್ತ ಘಟನೆ ನಡೆದಿತ್ತು. ಖಾಸಗಿ ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ತಲೆಹರಟೆ ಪ್ರೇಮಿಯೊಬ್ಬ ತೀಕ್ಷ್ಣವಾದ ಆಯುಧದಿಂದ (ಕತ್ತಿ) ಕೊಚ್ಚಿ ಅತ್ಯಂತ ಕ್ರೂರವಾಗಿ ಹತ್ಯೆ ಮಾಡಿದ್ದ. ನಡುರಸ್ತೆಯಲ್ಲೇ ನಡೆದ ಈ ಭೀಕರ ಹತ್ಯಾಕಾಂಡದಿಂದ ಇಡೀ ಜಿಲ್ಲೆ ಬೆಚ್ಚಿಬಿದ್ದಿತ್ತು ಹಾಗೂ ಸ್ಥಳೀಯರಲ್ಲಿ ತೀವ್ರ ಆತಂಕ ಸೃಷ್ಟಿಯಾಗಿತ್ತು. ಘಟನೆಯ ಬಳಿಕ ಆರೋಪಿ ಸ್ಥಳದಿಂದ ಪರಾರಿಯಾಗಿದ್ದ.
ಇಂದು ಬೆಳಿಗ್ಗೆ ಪಚ್ಚನಾಡಿಯಲ್ಲಿ ರಸ್ತೆ ಬದಿ ಕಾರು ನಿಲ್ಲಿಸಿ ಸ್ಥಳೀಯರ ಮೊಬೈಲ್ ಪಡೆದು ಫೋನ್ ಕರೆ ಮಾಡಲು ಯತ್ನಿಸಿದ್ದಾನೆ. ಈ ವೇಳೆ ಸ್ಥಳೀಯರು ಪ್ರಶ್ನಿಸಿಬಿಸಿರೋಡಿನಲ್ಲಿ ಯುವತಿಯ ಕೊಲೆ ಮಾಡಿದವನು ಇವನೇ ಎಂಬುವುದಾಗಿ ಪತ್ತೆಮಾಡಿ ಪೊಲೀಸರಿಗೆ ತಿಳಿಸಿದ್ದಾರೆ. ಪೊಲೀಸರು ಬಂದು ವಿಚಾರಣೆ ನಡೆಸಿದಾಗ ವಿಷ ಸೇವಿಸಿರುವುದು ತಿಳಿದು ಬಂದಿದೆ, ತಕ್ಷಣವೇ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ.

ಜಿಲ್ಲಾ ಎಸ್ಪಿ ಮಾಹಿತಿ: ಘಟನೆಯನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯ ಪತ್ತೆಗಾಗಿ ತಕ್ಷಣವೇ ವಿಶೇಷ ಕಾರ್ಯಾಚರಣೆ ಕೈಗೊಂಡಿದ್ದರು. ಇದೀಗ ಆರೋಪಿಯನ್ನು ಪತ್ತೆಹಚ್ಚಲಾಗಿದ್ದು, ಆತ ಪೊಲೀಸರಿಗೆ ಸಿಕ್ಕಿಬೀಳುವ ಮುನ್ನವೇ ಇಲಿಪಾಷಾಣ (ಇಲಿ ವಿಷ) ಸೇವಿಸಿರುವುದು ಬೆಳಕಿಗೆ ಬಂದಿದೆ.
ಪ್ರಕರಣದ ವಿವರ ಹಾಗೂ ದಾಖಲಾದ ಸೆಕ್ಷನ್ಗಳು:
ಲಾವಣ್ಯ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಅಪರಾಧ ಸಂಖ್ಯೆ 95/2026 ರಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಭಾರತೀಯ ನ್ಯಾಯ ಸಂಹಿತೆ (BNS – Bharatiya Nyaya Sanhita) ಯ ಕೆಳಗಿನ ಸೆಕ್ಷನ್ಗಳ ಅಡಿಯಲ್ಲಿ ಪ್ರಕರಣವನ್ನು ದಾಖಲಿಸಿಕೊಳ್ಳಲಾಗಿದೆ:
- ಸೆಕ್ಷನ್ 78 (ದೌರ್ಜನ್ಯ/ಸತಾಯಿಸುವಿಕೆ – Stalking)
- ಸೆಕ್ಷನ್ 126 (ಅಕ್ರಮ ತಡೆಹಿಡಿಯುವಿಕೆ – Wrongful restraint)
- ಸೆಕ್ಷನ್ 103 (ಕೊಲೆ – Murder)
ಎಸ್ ಪಿ ಕೆ. ಅರುಣ್ ಅವರ ಅಧಿಕೃತ ಹೇಳಿಕೆಯ ಪ್ರಮುಖಾಂಶಗಳು:
- ಘಟನೆಯ ಹಿನ್ನೆಲೆ: ನಿನ್ನೆ ಸಂಜೆ ಬಂಟ್ವಾಳ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಕೊಲೆ ನಡೆದಿದೆ. ಮೃತರನ್ನು ಕಕ್ಯಪದವು ನಿವಾಸಿ, 21 ವರ್ಷದ ಲಾವಣ್ಯ ಎಂದು ಗುರುತಿಸಲಾಗಿದೆ. ಆಕೆಯನ್ನು ಆರೋಪಿಯೊಬ್ಬ ಮಾರಕಾಸ್ತ್ರದಿಂದ ಕೊಚ್ಚಿ ಕೊಲೆ ಮಾಡಿದ್ದಾನೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.
- ಆರೋಪಿಯ ವಿವರ ಮತ್ತು ಉದ್ದೇಶ: ಪ್ರಾಥಮಿಕ ತನಿಖೆಯ ಪ್ರಕಾರ, ಲಾವಣ್ಯಳನ್ನು ಕೊಲೆ ಮಾಡಿದ ಆರೋಪಿ ಆಕೆಯ ದೂರದ ಸಂಬಂಧಿಯಾದ ಚೇತನ್ (22) ಎಂಬಾತನಾಗಿದ್ದಾನೆ. ಈತ ಯುವತಿಯನ್ನು ಏಕಪಕ್ಷೀಯವಾಗಿ ಪ್ರೀತಿಸುತ್ತಿದ್ದು (One-sided love), ಆಕೆ ನಿರಾಕರಿಸಿದ್ದರಿಂದ ಕೋಪಗೊಂಡು ತಲ್ವಾರ್ (ಮಚ್ಚು) ತಂದು ಸಾರ್ವಜನಿಕವಾಗಿ ಆಕೆಯ ಮೇಲೆ ಹಲ್ಲೆ ನಡೆಸಿ ಕೊಲೆಗೈದಿದ್ದಾನೆ.
- ಆರೋಪಿಯ ಬಂಧನ: ಘಟನೆ ನಡೆದ ತಕ್ಷಣ ಆರೋಪಿಯ ಪತ್ತೆಗಾಗಿ ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿತ್ತು. ಇಂದು (ಜುಲೈ 17) ಮುಂಜಾನೆ ಆರೋಪಿ ಚೇತನ್ನನ್ನು ಮಂಗಳೂರಿನಲ್ಲಿ ಪೊಲೀಸರು ಯಶಸ್ವಿಯಾಗಿ ವಶಕ್ಕೆ ಪಡೆದಿದ್ದಾರೆ.
- ಆತ್ಮಹತ್ಯೆ ಯತ್ನ ಹಾಗೂ ಆಸ್ಪತ್ರೆಗೆ ದಾಖಲು: ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸುವ ವೇಳೆ, ತಾನು ಇಲಿ ಪಾಷಾಣ (Rat poison) ಸೇವಿಸಿರುವುದಾಗಿ ಆರೋಪಿ ಒಪ್ಪಿಕೊಂಡಿದ್ದಾನೆ. ಈ ಹಿನ್ನೆಲೆಯಲ್ಲಿ ಪೊಲೀಸರು ತಕ್ಷಣವೇ ಆತನನ್ನು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿದ್ದಾರೆ.
- ಮುಂದಿನ ಕ್ರಮ: ಸದ್ಯ ಆಸ್ಪತ್ರೆಯಲ್ಲಿ ಆತನಿಗೆ ವೈದ್ಯಕೀಯ ಚಿಕಿತ್ಸೆ ನೀಡಲಾಗುತ್ತಿದ್ದು, ಚೇತರಿಸಿಕೊಂಡ ನಂತರ ಮುಂದಿನ ಬಂಧನ ಪ್ರಕ್ರಿಯೆ ಮತ್ತು ಕಾನೂನು ಕ್ರಮಗಳನ್ನು ಕೈಗೊಳ್ಳಲಾಗುವುದು ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಯವರು ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಮಾನ್ಯ ಜಿಲ್ಲಾ ಎಸ್ಪಿಯವರು, “ನಿನ್ನೆ ಬಂಟ್ವಾಳದಲ್ಲಿ ನಡೆದ ಘಟನೆಯ ಆರೋಪಿಯನ್ನು ಪತ್ತೆ ಹಚ್ಚಲಾಗಿದೆ. ಆತನು ಇಲಿಪಾಷಾಣ ತೆಗೆದುಕೊಂಡಿರುವುದರಿಂದ ಆತನನ್ನು ತಪಾಸಣೆ ಮತ್ತು ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋಗಿ ದಾಖಲಿಸಲಾಗಿದೆ. ಎಂದು ಸ್ಪಷ್ಟಪಡಿಸಿದ್ದಾರೆ.
ಸದ್ಯ ಆಸ್ಪತ್ರೆಯಲ್ಲಿ ಆರೋಪಿಗೆ ಬಿಗಿ ಪೊಲೀಸ್ ಬಂದೋಬಸ್ತ್ನಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ಆತನ ಪ್ರಾಣಾಪಾಯದಿಂದ ಪಾರಾದ ಬಳಿಕ ಹೆಚ್ಚಿನ ವಿಚಾರಣೆ ನಡೆಸಲಾಗುವುದು ಎಂದು ಮೂಲಗಳು ತಿಳಿಸಿವೆ. ತಲೆಹರಟೆ ಪ್ರೇಮದ ಹಿನ್ನೆಲೆಯಲ್ಲಿ ಈ ಕೊಲೆ ನಡೆದಿದೆಯೇ ಅಥವಾ ಬೇರೆನಾದರೂ ಕಾರಣವಿದೆಯೇ ಎಂಬ ಬಗ್ಗೆ ಬಂಟ್ವಾಳ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಚುರುಕುಗೊಳಿಸಿದ್ದಾರೆ.
arrest
ಪೆರ್ಡೂರು ಪ್ರದೀಪ್ ಪೂಜಾರಿ ಹಲ್ಲೆ, ಆತ್ಮಹತ್ಯೆ ಪ್ರಕರಣ – ಇಬ್ಬರು ಆರೋಪಿಗಳು ಮಧ್ಯಪ್ರದೇಶದಲ್ಲಿ ಬಂಧನ..
ಉಡುಪಿ: ಪೆರ್ಡೂರಿನ ಪ್ರದೀಪ್ ಪೂಜಾರಿ (28) ಅವರ ಮೇಲಿನ ಹಲ್ಲೆ ಹಾಗೂ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಉಡುಪಿ ಪೊಲೀಸರು ಮಹತ್ವದ ಕಾರ್ಯಾಚರಣೆ ನಡೆಸಿದ್ದು, ಮಧ್ಯಪ್ರದೇಶದಲ್ಲಿ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ.
ಈ ಕುರಿತು ಮಾಹಿತಿ ನೀಡಿರುವ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (SP) ಹರಿರಾಮ್ ಶಂಕರ್ ಅವರು, ವಶಕ್ಕೆ ಪಡೆದಿರುವ ಆರೋಪಿಗಳನ್ನು ಉಡುಪಿಗೆ ಕರೆತರಲಾಗುತ್ತಿದೆ. ಬಂಧನಕ್ಕೆ ಸಂಬಂಧಿಸಿದ ಅಧಿಕೃತ ಪ್ರಕ್ರಿಯೆಗಳು ಪೂರ್ಣಗೊಂಡ ನಂತರ ಆರೋಪಿಗಳ ಸಂಪೂರ್ಣ ವಿವರಗಳನ್ನು ಬಹಿರಂಗಪಡಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.
ಪ್ರಕರಣದ ಹಿನ್ನೆಲೆ:
ಪೆರ್ಡೂರಿನ ಪ್ರದೀಪ್ ಪೂಜಾರಿ ಅವರ ಮೇಲೆ ಅಕ್ಟೋಬರ್ 27ರ ರಾತ್ರಿ ಶ್ರಾವ್ಯಾ ಶೆಟ್ಟಿ ಕುಟುಂಬದವರು ಮೂರು ಕಾರುಗಳಲ್ಲಿ ಬಂದು ಅಡ್ಡಗಟ್ಟಿ ಭೀಕರವಾಗಿ ಹಲ್ಲೆ ನಡೆಸಿದ್ದರು ಎಂದು ಪ್ರದೀಪ್ ಅವರ ಸಹೋದರ ದಿಲೀಪ್ ಕುಮಾರ್ ದೂರಿನಲ್ಲಿ ಆರೋಪಿಸಿದ್ದರು. ಹಲ್ಲೆಯಿಂದ ಗಾಯಗೊಂಡಿದ್ದ ಪ್ರದೀಪ್ ಅಕ್ಟೋಬರ್ 28ರಂದು ಜಿಲ್ಲಾಸ್ಪತ್ರೆಗೆ ದಾಖಲಾಗಿದ್ದರು. ಆದರೆ, ಅಕ್ಟೋಬರ್ 30ರ ಸಂಜೆ 5:30ರ ಸುಮಾರಿಗೆ ಆಸ್ಪತ್ರೆಯ ಶೌಚಾಲಯದಲ್ಲಿ ಪ್ರದೀಪ್ ಆತ್ಮಹತ್ಯೆ ಮಾಡಿಕೊಂಡಿದ್ದರು. ಈ ಘಟನೆಗೆ ಸಂಬಂಧಿಸಿದಂತೆ ಶ್ರಾವ್ಯಾ ಶೆಟ್ಟಿ, ಪ್ರಸನ್ನ ಶೆಟ್ಟಿ, ಸುಧೀರ್, ಶೈಲೇಶ್ ಸೇರಿದಂತೆ 10ಕ್ಕೂ ಹೆಚ್ಚು ಮಂದಿಯ ವಿರುದ್ಧ ಉಡುಪಿ ನಗರ ಪೊಲೀಸ್ ಠಾಣೆಯಲ್ಲಿ ಆತ್ಮಹತ್ಯೆಗೆ ಪ್ರಚೋದನೆ ನೀಡಿದ ಪ್ರಕರಣ ದಾಖಲಾಗಿದೆ.
ವಿಶೇಷ ತಂಡಗಳ ರಚನೆ:
ಪ್ರಕರಣದ ತನಿಖೆಗಾಗಿ ಹಾಗೂ ಆರೋಪಿಗಳ ಪತ್ತೆಗೆ ಎಸ್ಪಿ ಅವರು 5 ವಿಶೇಷ ಪೊಲೀಸ್ ತಂಡಗಳನ್ನು ರಚಿಸಿದ್ದರು. ಅಧಿಕಾರಿ ಅಮಾನತು: ಪ್ರದೀಪ್ ಅವರ ಮೇಲೆ ಹಲ್ಲೆ ನಡೆದಾಗ ಆರಂಭದಲ್ಲಿ ಎಫ್ಐಆರ್ (FIR) ದಾಖಲಿಸದೆ ಕೇವಲ ಎನ್ಸಿ (NC) ದಾಖಲಿಸಿದ್ದ ಹಿರಿಯಡ್ಕ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್ (SI) ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ಅವರನ್ನು ಕರ್ತವ್ಯದಿಂದ ತೆರವುಗೊಳಿಸಿ ಇಲಾಖಾ ತನಿಖೆಗೆ ಆದೇಶಿಸಲಾಗಿದೆ. ಪೂರ್ವ ದೂರುಗಳು ಹಾಗೂ ಚಾರ್ಜ್ಶೀಟ್:ಇನ್ನೊಂದೆಡೆ, ಮೃತ ಪ್ರದೀಪ್ ಪೂಜಾರಿ ವಿರುದ್ಧವೂ ಯುವತಿ ಈ ಹಿಂದೆ 3 ಬಾರಿ ದೂರು ನೀಡಿದ್ದರು: 2025 ನವೆಂಬರ್ 10: ಬೆದರಿಕೆ ಕರೆ ಹಾಕಿದ ಆರೋಪ. ನವೆಂಬರ್ 29: ಅತ್ಯಾಚಾರ ಆರೋಪ. ಅಕ್ಟೋಬರ್ 28: ಖಾರದ ಪುಡಿ ಎರಚಿ ಕೊಲೆಯತ್ನ ನಡೆಸಿದ ಆರೋಪ. ಈ ಮೂರೂ ಪ್ರಕರಣಗಳಿಗೆ ಸಂಬಂಧಿಸಿದಂತೆ ಈಗಾಗಲೇ ನ್ಯಾಯಾಲಯಕ್ಕೆ ಚಾರ್ಜ್ಶೀಟ್ ಸಲ್ಲಿಕೆಯಾಗಿದೆ ಎಂದು ಎಸ್ಪಿ ತಿಳಿಸಿದ್ದಾರೆ. ಸದ್ಯ ಪ್ರಕರಣದ ತನಿಖೆ ತೀವ್ರಗತಿಯಲ್ಲಿ ಸಾಗುತ್ತಿದ್ದು, ಉಳಿದ ಆರೋಪಿಗಳಿಗಾಗಿ ಪೊಲೀಸರು ಜಾಲ ಬೀಸಿದ್ದಾರೆ.
arrest
ಕೊಲೆ ಮಾಡಿದ ಸ್ನೇಹಿತನೇ ಕನಸಿನಲ್ಲಿ ದೆವ್ವವಾಗಿ ಕಾಡಿದ! ಭಯ ತಾಳಲಾರದೆ ಪೊಲೀಸರಿಗೆ ಶರಣಾದ ಆರೋಪಿ
ಮದ್ಯದ ಪಾರ್ಟಿ ವೇಳೆ ಸ್ನೇಹಿತನನ್ನೇ ಹೊಡೆದು ಕೊಂದಿದ್ದ ಯುವಕ; 15 ದಿನಗಳ ಕಾಲ ನಿದ್ರೆಯಲ್ಲೂ ಕಾಡಿದ ಮೃತ ಸ್ನೇಹಿತನ ನೆನಪು – ಕೊನೆಗೆ ಕೊಲೆ ರಹಸ್ಯ ಬಯಲು
ಮುಂಬೈ: ಮದ್ಯದ ಪಾರ್ಟಿ ವೇಳೆ ಉಂಟಾದ ಜಗಳದಲ್ಲಿ ಸ್ನೇಹಿತನನ್ನೇ ಹೊಡೆದು ಕೊಲೆಗೈದು, ಮೃತದೇಹವನ್ನು ಚೀಲದಲ್ಲಿ ತುಂಬಿ ನಿರ್ಜನ ಪ್ರದೇಶದಲ್ಲಿ ಎಸೆದಿದ್ದ ಯುವಕನೊಬ್ಬ, ಕೊನೆಗೆ ಮೃತ ಸ್ನೇಹಿತ ಕನಸಿನಲ್ಲಿ ಪದೇಪದೇ ಬಂದು ಕಾಡುತ್ತಿದ್ದಾನೆಂಬ ಭಯದಿಂದ ಪೊಲೀಸರ ಮುಂದೆ ಶರಣಾಗಿ ತನ್ನ ಕೃತ್ಯವನ್ನು ಒಪ್ಪಿಕೊಂಡಿದ್ದಾನೆ.
ಮಹಾರಾಷ್ಟ್ರದ ಥಾಣೆ ಜಿಲ್ಲೆಯ ಡೊಂಬಿವ್ಲಿ ನಿವಾಸಿ, ಹೌಸ್ಕೀಪಿಂಗ್ ಕೆಲಸಗಾರ ಪ್ರಭು ಕಾರ್ಕಡೆ (24) ಬಂಧಿತ ಆರೋಪಿ. ಎರಡು ವಾರಗಳ ಹಿಂದೆ ಡೊಂಬಿವ್ಲಿ ಸಮೀಪದ ಮೋಥಾ ಗ್ರಾಮದಲ್ಲಿ ಪಲ್ಲವ್ ಅಲಿಯಾಸ್ ವಿಶಾಲ್ ಮಧುಕರ್ ಕದಮ್ (43) ಎಂಬವರ ಮೃತದೇಹ ಪತ್ತೆಯಾಗಿತ್ತು ಎಂದು ಹಿರಿಯ ಪೊಲೀಸ್ ಇನ್ಸ್ಪೆಕ್ಟರ್ ಪ್ರಫುಲ್ಲ ಜಾಧವ್ ತಿಳಿಸಿದ್ದಾರೆ.
ಪೊಲೀಸರ ವಿಚಾರಣೆ ವೇಳೆ ಪ್ರಭು ನೀಡಿದ ಹೇಳಿಕೆಯ ಪ್ರಕಾರ, ಸ್ನೇಹಿತ ಕದಮ್ ಅವರ ಮನೆಯಲ್ಲೇ ಇಬ್ಬರೂ ಮದ್ಯಪಾನ ಮಾಡುತ್ತಿದ್ದಾಗ ಜಗಳ ಉಂಟಾಗಿತ್ತು. ಈ ವೇಳೆ ಆಕ್ರೋಶಗೊಂಡ ಪ್ರಭು, ಕದಮ್ ಅವರನ್ನು ಹೊಡೆದು ಕೊಲೆ ಮಾಡಿದ್ದಾನೆ.ಆತ ಮೃತಪಟ್ಟಿದ್ದ. ಸ್ನೇಹಿತ ಮೃತಪಟ್ಟಿರುವುದನ್ನು ಕಂಡು ಗಾಬರಿಗೊಂಡ ಪ್ರಭು, ತಕ್ಷಣ ತನ್ನ ಬಾಡಿಗೆ ಮನೆಯ ಮಾಲೀಕ ಸಂದೇಶ್ ಮ್ಹಾತ್ರೆ ಎಂಬಾತನ ಸಹಾಯ ಕೋರಿದ್ದಾನೆ. ಅವರಿಬ್ಬರೂ ಸೇರಿ ವಿಶಾಲ್ ಅವರ ಮೃತದೇಹವನ್ನು ಚೀಲವೊಂದರಲ್ಲಿ ತುಂಬಿ, ರಾತ್ರೋರಾತ್ರಿ ಹತ್ತಿರದ ನಿರ್ಜನ ಪ್ರದೇಶದಲ್ಲಿ ಎಸೆದು ಸಾಕ್ಷ್ಯ ನಾಶಪಡಿಸಿದ್ದರು. ಬಳಿಕ ಪರಾರಿಯಾಗಿದ್ದಾನೆ.
ಕೊಲೆ ಮಾಡಿದ ಬಳಿಕ ಯಾರಿಗೂ ಅನುಮಾನ ಬಾರದಂತೆ ಆರಾಮವಾಗಿದ್ದ ಪ್ರಭುವಿಗೆ ಕೆಲವೇ ದಿನಗಳಲ್ಲಿ ಭಯ ಶುರುವಾಗಿದೆ. ಮೃತಪಟ್ಟ ಸ್ನೇಹಿತ ವಿಶಾಲ್ ಪದೇಪದೇ ಕನಸಿನಲ್ಲಿ ಬಂದು ಕಾಡುತ್ತಿದ್ದ. ಸುಮಾರು 15 ದಿನಗಳ ಕಾಲ ಸರಿಯಾಗಿ ನಿದ್ರೆ ಮಾಡಲೂ ಸಾಧ್ಯವಾಗದೆ ತೀವ್ರ ಆತಂಕಕ್ಕೆ ಒಳಗಾಗಿದ್ದ ಎಂದು ಆತ ಪೊಲೀಸರಿಗೆ ತಿಳಿಸಿದ್ದಾನೆ.
ಕನಸಿನ ಭಯ ಹಾಗೂ ಪಶ್ಚಾತ್ತಾಪದಿಂದ ಕಂಗೆಟ್ಟ ಪ್ರಭು, ಕೊನೆಗೆ ತಾನಾಗಿಯೇ ಪೊಲೀಸರ ಬಳಿಗೆ ತೆರಳಿ ಕೊಲೆ ಮಾಡಿರುವುದಾಗಿ ಒಪ್ಪಿಕೊಂಡು ಶರಣಾಗಿದ್ದಾನೆ. ಸೋಮವಾರ ಆತನನ್ನು ಬಂಧಿಸಲಾಗಿದೆ. ಅಲ್ಲದೆ, ಮೃತದೇಹ ಎಸೆದಿದ್ದ ಸ್ಥಳವನ್ನೂ ಪೊಲೀಸರಿಗೆ ತೋರಿಸಿದ್ದಾನೆ.
ಈ ಸಂಬಂಧ ವಿಷ್ಣು ನಗರ ಪೊಲೀಸ್ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 103(1)ರ ಅಡಿಯಲ್ಲಿ ಕೊಲೆ ಪ್ರಕರಣ ದಾಖಲಿಸಲಾಗಿದೆ. ಪ್ರಕರಣದ ಕುರಿತು ಹೆಚ್ಚಿನ ತನಿಖೆ ಮುಂದುವರಿದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
arrest
ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ
ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್ಮೆಂಟ್ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.
ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್ವೆಲ್ ಉಜ್ಜೋಡಿ ಬಳಿಯ ಅಪಾರ್ಟ್ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.
ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.
ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.
-
accident3 months agoಬಿ.ಸಿ. ರೋಡ್ ಸರ್ಕಲ್ನಲ್ಲಿ ಭೀಕರ ಅಪಘಾತ: ಟಿಪ್ಪರ್-ಆಕ್ಟಿವಾ ನಡುವೆ ಡಿಕ್ಕಿ, ಸವಾರರಿಬ್ಬರೂ ದುರ್ಮರಣ
-
Bantawala4 months agoಬಂಟ್ವಾಳದಲ್ಲಿ ಭೀಕರ ಹತ್ಯಾಕಾಂಡ: ಬಸ್ನಲ್ಲಿ ಕುಳಿತಿದ್ದ ಯುವತಿಯನ್ನು ಸಾರ್ವಜನಿಕರೆದುರೇ ಕೊಚ್ಚಿ ಕೊಂದ ತಲೆಹರಟೆ ಪ್ರೇಮಿ!
-
crime9 months agoಅತ್ಯಾಚಾರ ಯತ್ನಕ್ಕೆ ತಡೆದ ಸೊಸೆಯ ಮುಖಕ್ಕೆ ಕಚ್ಚಿ ಕೊಲೆಗೆ ಯತ್ನಿಸಿದ ಮಾವ..ತಂದೆಯ ರಾಕ್ಷಸೀ ಕೃತ್ಯಕ್ಕೆ ಬೆಂಬಲಿಸಿದ ಗಂಡ..ಸುಳ್ಯ ಠಾಣಾ ವ್ಯಾಪ್ತಿಯಲ್ಲಿ ಅದೃಷ್ಟವಶಾತ್ ಬಚಾವಾದ ಸೊಸೆ..
-
crime7 months agoಧಾರ್ಮಿಕ ನಂಬಿಕೆಗೆ ಅವಮಾನ: ಕೊಡಗಿನ ಎಮ್ಮೆಮಾಡಿನಲ್ಲಿ ದೈವದ ವೇಷದಂತೆ ಧರಿಸಿ ಮದುಮಗನ ಅತಿರೇಕದ ವರ್ತನೆ!
-
Bantawala7 months agoವಿಟ್ಲದಲ್ಲಿ ನಡೆಯಿತೊಂದು ದೈವ ಕಾರಣಿಕ; ಪೊಲೀಸರ ಕಣ್ಣಿಗೆ ಮಣ್ಣೆರಚಿದರೂ ದೈವದ ದೃಷ್ಟಿಗೆ ತತ್ತರಿಸಿದ ದನಕಳ್ಳ..
-
Bantawala10 months agoನಾಗಬನ, ರಕ್ತೇಶ್ವರಿ ತಾಣ, ದೈವದೇವರ ಸಾನಿಧ್ಯ ದ್ವಂಸ ಗೊಳಿಸಿದ ಧರ್ಮದ್ರೋಹಿ ಕೃತ್ಯದ ವಿರುದ್ಧ ಭಕ್ತರ ಆಕ್ರೋಶ ; ನಾಶವಾದ ಸಾನಿಧ್ಯದಲ್ಲಿಯೇ ಸ್ವಾಮೀಜಿಯವರ ಮಾರ್ಗದರ್ಶನದಲ್ಲಿ ಕುಟುಂಬಸ್ತರು, ಸಾರ್ವಜನಿಕರ ಸಾಮೂಹಿಕ ಪ್ರಾರ್ಥನೆ
-
accident4 months agoBreaking: ಬಂಟ್ವಾಳದಲ್ಲಿ ಶಾಲಾ ಬಸ್ ಮೇಲೆ ಉರುಳಿದ ಬೃಹತ್ ಮರ; ಕಲ್ಲಡ್ಕ ಶ್ರೀರಾಮ ಶಾಲೆಯ ಓರ್ವ ವಿದ್ಯಾರ್ಥಿ ಸಾವು, ಕೆಲವರು ಗಂಭೀರ, ಹಲವರಿಗೆ ಗಾಯ!
-
accident6 months agoವಿಟ್ಲ ಆಕಾಶದಲ್ಲಿ ಹಾರಾಡಿದ ವಿಮಾನ: ತಾಂತ್ರಿಕ ದೋಷವಲ್ಲ, ಹವಾಮಾನ ವೈಪರೀತ್ಯದ ಕಾರಣ ! ಸಾರ್ವಜನಿಕರು ಆತಂಕ ಪಡುವ ಅಗತ್ಯವಿಲ್ಲ
