Connect with us

Belthangady

ಬೆಳ್ತಂಗಡಿ ಆಂಬುಲೆನ್ಸ್ ಚಾಲಕ ಡ್ರಗ್ಸ್ ದಂಧೆಯಲ್ಲಿ ಭಾಗಿ: 5.5 ಕೋಟಿ ರೂ. ಮೌಲ್ಯದ MDMA ಪ್ರಕರಣದಲ್ಲಿ ‘ಜಲೀಲ್ ಬಾಬಾ’ ಪರಾರಿ

Published

on

ಬಾಗಲಕೋಟೆ/ಮಂಗಳೂರು: ಕರಾವಳಿ ಹಾಗೂ ಸುತ್ತಮುತ್ತಲ ಜಿಲ್ಲೆಗಳನ್ನು ಬೆಚ್ಚಿಬೀಳಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ಎಂಡಿಎಂಎ (MDMA) ಮಾದಕ ವಸ್ತು ಜಪ್ತಿ ಪ್ರಕರಣಕ್ಕೆ ಇದೀಗ ಮತ್ತೊಂದು ಬಿಗ್ ಟ್ವಿಸ್ಟ್ ಸಿಕ್ಕಿದೆ. ಪ್ರಕರಣದ ತನಿಖೆ ತೀವ್ರಗೊಳಿಸಿರುವ ಮಂಗಳೂರು ನಗರ ಅಪರಾಧ ವಿಭಾಗ (CCB) ಪೊಲೀಸರು, ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಅಲಿಯಾಸ್ ಬಾಬಾ (42) ಎಂಬಾತನನ್ನು ಪ್ರಮುಖ ಆರೋಪಿಯನ್ನಾಗಿ ಸೇರ್ಪಡೆಗೊಳಿಸಿದ್ದಾರೆ.

ಈ ಕುರಿತು CCB ಪೊಲೀಸರು ಮಂಗಳೂರಿನ ಪ್ರಿನ್ಸಿಪಲ್ ಸೆಷನ್ಸ್ ನ್ಯಾಯಾಲಯಕ್ಕೆ ಹೆಚ್ಚುವರಿ ವರದಿ ಸಲ್ಲಿಸಿದ್ದು, ಆರೋಪಿ ಜಲೀಲ್ ಬಾಬಾ ದಸ್ತಗಿರಿಗೆ ಬಾಕಿ ಇದ್ದಾನೆ ಎಂದು ಉಲ್ಲೇಖಿಸಿದ್ದಾರೆ.

ಪ್ರಕರಣದ ಹಿನ್ನೆಲೆ ಮತ್ತು ಕಾರ್ಯಾಚರಣೆ

ಆರಂಭದಲ್ಲಿ CCB ಪೊಲೀಸರು ಮಂಗಳೂರಿನ ಕುಳಾಯಿಗುಡ್ಡೆ ವಾಟರ್ ಟ್ಯಾಂಕ್ ಸಮೀಪದ ಮನೆಯೊಂದರ ಮೇಲೆ ದಾಳಿ ನಡೆಸಿ, ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು ಎಂಬಾತನಿಂದ 1.50 ಲಕ್ಷ ರೂ. ಮೌಲ್ಯದ 15.17 ಗ್ರಾಂ MDMA ವಶಪಡಿಸಿಕೊಂಡಿದ್ದರು. ಈತನ ವಿಚಾರಣೆ ವೇಳೆ ಮಾದಕ ವಸ್ತು ಪೂರೈಕೆಯ ಬೃಹತ್ ಜಾಲದ ಸುಳಿವು ಲಭಿಸಿತ್ತು.

ಇದರ ಬೆನ್ನಲ್ಲೇ ತನಿಖೆ ಚುರುಕುಗೊಳಿಸಿದ ಪೊಲೀಸರು ಜುಲೈ 15 ರಂದು ಬಾಗಲಕೋಟೆ ಜಿಲ್ಲೆಯ ಹುನಗುಂದ ಸಮೀಪದ ರಾಷ್ಟ್ರೀಯ ಹೆದ್ದಾರಿಯಲ್ಲಿರುವ ‘ರಾಯಲ್ ಇನ್’ ಲಾಡ್ಜ್ ಮೇಲೆ ಮಿಂಚಿನ ದಾಳಿ ನಡೆಸಿದರು. ಅಲ್ಲಿ ಮೂವರು ಪ್ರಮುಖ ಆರೋಪಿಗಳನ್ನು ಬಂಧಿಸಿ, ಅವರಿಂದ ಅಂದಾಜು 5.5 ಕೋಟಿ ರೂಪಾಯಿ ಮೌಲ್ಯದ 5 ಕೆಜಿ 196 ಗ್ರಾಂ MDMA, ಕಾರು, ಬ್ಯಾಗ್ ಹಾಗೂ ಮೊಬೈಲ್ ಫೋನ್‌ಗಳನ್ನು ಜಪ್ತಿ ಮಾಡಿದ್ದರು.

ಈಗಾಗಲೇ ಬಂಧನಕ್ಕೊಳಗಾದ ಆರೋಪಿಗಳು:

  • ಮೊಹಮ್ಮದ್ ಅಲ್ತಾಫ್ (28), ಇಂದಬೆಟ್ಟು ಗ್ರಾಮ, ಬೆಳ್ತಂಗಡಿ (ಈತನ ವಿರುದ್ಧ 2024ರಲ್ಲಿ ಕೊಣಾಜೆ ಹಾಗೂ 2026ರಲ್ಲಿ ಉರ್ವ ಠಾಣೆಯಲ್ಲಿ ಡ್ರಗ್ಸ್ ಪ್ರಕರಣಗಳಿವೆ)
  • ಮೊಹಮ್ಮದ್ ಮುಸ್ತಫಾ (28), ಹಳೇಪೇಟೆ, ಉಜಿರೆ
  • ಅಲ್ತಾಫ್, ದೇವನಾರಿ, ಇಂದಬೆಟ್ಟು ಗ್ರಾಮ
  • ಅಣ್ಣಪ್ಪ ಸ್ವಾಮಿ ಅಲಿಯಾಸ್ ಮನು

ಆಂಬುಲೆನ್ಸ್‌ನಲ್ಲೇ ಡ್ರಗ್ಸ್ ಸಪ್ಲೈ: ವಿದ್ಯಾರ್ಥಿಗಳು, ವೈದ್ಯರೇ ಟಾರ್ಗೆಟ್!

ಪೊಲೀಸರ ಪ್ರಾಥಮಿಕ ತನಿಖೆಯ ಪ್ರಕಾರ, ಆರೋಪಿಗಳು ದೆಹಲಿಯಿಂದ ಕಾರಿನಲ್ಲಿ MDMA ಖರೀದಿಸಿ ಬೆಂಗಳೂರಿಗೆ ತರುತ್ತಿದ್ದರು. ಅಲ್ಲಿಂದ ದಕ್ಷಿಣ ಕನ್ನಡ, ಉಡುಪಿ ಹಾಗೂ ಕೇರಳದ ವಿವಿಧ ಭಾಗಗಳಿಗೆ ಸರಬರಾಜು ಮಾಡುತ್ತಿದ್ದರು.

ಬಂಧಿತ ಆರೋಪಿಗಳ ವಿಚಾರಣೆ ವೇಳೆ ಜಲೀಲ್ ಬಾಬಾ ಪಾತ್ರ ಬಹಿರಂಗವಾಗಿದೆ. ಈತ ಮಾದಕ ವಸ್ತು ತರಲು ತನ್ನ ಆಂಬುಲೆನ್ಸ್ ವಾಹನವನ್ನು ಬಾಡಿಗೆಗೆ ನೀಡುತ್ತಿದ್ದನೆನ್ನಲಾಗಿದೆ. ಅಷ್ಟೇ ಅಲ್ಲದೆ, ಸರಬರಾಜಾದ ಸರಕನ್ನು ಆಂಬುಲೆನ್ಸ್‌ನಲ್ಲೇ ಸಾಗಿಸಿ ಜಿಲ್ಲೆಯ ವಿದ್ಯಾರ್ಥಿಗಳು, ಯುವಕರು ಹಾಗೂ ವೈದ್ಯರನ್ನು ಕೇಂದ್ರೀಕರಿಸಿ ಮಾರಾಟ ಮಾಡುತ್ತಿದ್ದ ಪ್ರಮುಖ ಸೂತ್ರಧಾರ ಈತ ಎಂದು ಪೊಲೀಸರು ತಿಳಿಸಿದ್ದಾರೆ.

ಕಳೆದ 6 ದಿನಗಳಿಂದ ತಲೆಮರೆಸಿಕೊಂಡ ಜಲೀಲ್ ಬಾಬಾ

ಪ್ರಕರಣದಲ್ಲಿ ಹೆಸರು ಸೇರ್ಪಡೆಯಾಗುತ್ತಿದ್ದಂತೆಯೇ ಬೆಳ್ತಂಗಡಿಯ ಆಂಬುಲೆನ್ಸ್ ಚಾಲಕ ಜಲೀಲ್ ಬಾಬಾ ಕಳೆದ 6 ದಿನಗಳಿಂದ ತಲೆಮರೆಸಿಕೊಂಡಿದ್ದಾನೆ. ತನ್ನ ಮೊಬೈಲ್ ಫೋನ್ ಸ್ವಿಚ್ ಆಫ್ ಮಾಡಿಕೊಂಡಿದ್ದು, ತುರ್ತು ಆಂಬುಲೆನ್ಸ್ ಕರೆಗಳಿಗೂ ಸಿಗುತ್ತಿಲ್ಲ.

ಪ್ರಸ್ತುತ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು (SP) ಹಾಗೂ ಮಂಗಳೂರು ನಗರ ಪೊಲೀಸ್ ಕಮಿಷನರ್ ಅವರ ಮಾರ್ಗದರ್ಶನದಲ್ಲಿ ಪ್ರತ್ಯೇಕ ತಂಡ ರಚಿಸಲಾಗಿದ್ದು, ಆರೋಪಿಯ ಬಂಧನಕ್ಕೆ ಬಲೆ ಬೀಸಲಾಗಿದೆ.

CCB ಪೊಲೀಸರಿಂದ ಗಂಭೀರ ಎಚ್ಚರಿಕೆ

ಈ ಪ್ರಕರಣವನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿರುವ CCB ಪೊಲೀಸರು, ತಲೆಮರೆಸಿಕೊಂಡಿರುವ ಆರೋಪಿ ಜಲೀಲ್ @ ಬಾಬಾಗೆ ಯಾವುದೇ ರೀತಿಯಲ್ಲಿ ಆಶ್ರಯ ನೀಡಿದರೆ, ನೆರವು ನೀಡಿದರೆ ಅಥವಾ ಮಾಹಿತಿ ಬಚ್ಚಿಟ್ಟರೆ ಅಂತಹವರ ವಿರುದ್ಧವೂ ಕಾನೂನು ಪ್ರಕಾರ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಸ್ಪಷ್ಟ ಎಚ್ಚರಿಕೆ ನೀಡಿದ್ದಾರೆ.

ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

arrest

ಮಂಗಳೂರು: MDMA ಮಾದಕ ವಸ್ತು ಮಾರಾಟ ಮಾಡುತ್ತಿದ್ದ ಮಹಿಳೆಯ ಬಂಧನ; 15.30 ಲಕ್ಷ ರೂ. ಮೌಲ್ಯದ ಡ್ರಗ್ಸ್ ವಶ

Published

on

ಮಂಗಳೂರು: ನಗರದಾದ್ಯಂತ ಯುವಕರು ಹಾಗೂ ವಿದ್ಯಾರ್ಥಿಗಳಿಗೆ ಮಾದಕ ವಸ್ತು ಪೂರೈಸುತ್ತಿದ್ದ ಆರೋಪಿತೆಯನ್ನು ಮಂಗಳೂರು ಉತ್ತರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಬೆಳ್ತಂಗಡಿ ತಾಲೂಕಿನ ಲಾಯಿಲ ಗುರಿಂಗಾನ ನಿವಾಸಿ, ಪ್ರಸ್ತುತ ಪಂಪ್‌ವೆಲ್ ಉಜ್ಜೋಡಿಯ ರಾಧಾ ರೆಸಿಡೆನ್ಸಿ ಅಪಾರ್ಟ್‌ಮೆಂಟ್‌ನ ಫ್ಲ್ಯಾಟ್ ನಂಬರ್ 103ರಲ್ಲಿ ವಾಸ್ತವ್ಯವಿದ್ದ ನಸೀಮಾ @ ನಸೀಮ (42) ಬಂಧಿತ ಆರೋಪಿ.

ಘಟನೆಯ ವಿವರ: ದಿನಾಂಕ 01-11-2026ರಂದು ಮಂಗಳೂರು ಉತ್ತರ ಪೊಲೀಸ್ ಠಾಣೆಯಲ್ಲಿ ವರದಿಯಾದ ಮಾದಕ ವಸ್ತು ಸೇವನೆ ಪ್ರಕರಣದ ತನಿಖೆ ಕೈಗೆತ್ತಿಕೊಂಡ ಪೊಲೀಸರು, ಆರೋಪಿಗಳಿಗೆ ಡ್ರಗ್ಸ್ ಪೂರೈಸುತ್ತಿದ್ದ ಜಾಲದ ಬಗ್ಗೆ ಮಾಹಿತಿ ಸಂಗ್ರಹಿಸಿದ್ದರು. ಈ ವೇಳೆ ಪಂಪ್‌ವೆಲ್ ಉಜ್ಜೋಡಿ ಬಳಿಯ ಅಪಾರ್ಟ್‌ಮೆಂಟ್ ಮೇಲೆ ದಾಳಿ ನಡೆಸಿದ ಪೊಲೀಸರು, ಆರೋಪಿತೆಯ ವಶದಲ್ಲಿದ್ದ ಸುಮಾರು 15,30,000 ರೂಪಾಯಿ ಮೌಲ್ಯದ 153 ಗ್ರಾಂ MDMA ಮಾದಕ ವಸ್ತುವನ್ನು ಜಪ್ತಿ ಮಾಡಿದ್ದಾರೆ.

ಬಂಧಿತ ಆರೋಪಿತೆಯು ಮಂಗಳೂರು ನಗರದ ವಿವಿಧೆಡೆ ಯುವಕರು ಹಾಗೂ ಕಾಲೇಜು ವಿದ್ಯಾರ್ಥಿಗಳನ್ನು ಗುರಿಯಾಗಿಸಿಕೊಂಡು ಮಾದಕ ವಸ್ತು ಮಾರಾಟ ಮಾಡುತ್ತಿದ್ದುದು ವಿಚಾರಣೆ ವೇಳೆ ತಿಳಿದುಬಂದಿದೆ. ಪೊಲೀಸರು ಆರೋಪಿತೆಯನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ಮಾನ್ಯ ನ್ಯಾಯಾಲಯವು ಆಕೆಗೆ ನ್ಯಾಯಾಂಗ ಬಂಧನ ವಿಧಿಸಿದೆ.

ಈ ಜಾಲದಲ್ಲಿ ಇನ್ನು ಹಲವು ಆರೋಪಿಗಳು ಭಾಗಿಯಾಗಿದ್ದು, ಅವರ ಬಂಧನಕ್ಕಾಗಿ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. ಕಾರ್ಯಾಚರಣೆಯಲ್ಲಿ ಮಂಗಳೂರು ಉತ್ತರ ಪೊಲೀಸ್ ಠಾಣೆಯ ಅಧಿಕಾರಿಗಳು ಹಾಗೂ ಸಿಬ್ಬಂದಿಗಳು ಭಾಗವಹಿಸಿದ್ದರು.

Continue Reading

Belthangady

ಸೌಜನ್ಯ ಪ್ರಕರಣದ ತನಿಖಾ ಸಮಿತಿ ಪುನಾರಚನೆ: ಸಿಐಡಿ ಐಜಿಪಿ ಚೇತನ್ ಸಿಂಗ್ ರಾಥೋಡ್ ಮುಖ್ಯಸ್ಥರಾಗಿ ನೇಮಕ

Published

on

ಬೆಂಗಳೂರು: ಧರ್ಮಸ್ಥಳದ ಸೌಜನ್ಯ ಪ್ರಕರಣದ ತನಿಖೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ರಚಿಸಿದ್ದ ವಿಶೇಷ ತನಿಖಾ ತಂಡದಲ್ಲಿ ಮಹತ್ವದ ಬದಲಾವಣೆ ಮಾಡಿ ತಿದ್ದುಪಡಿ ಆದೇಶ ಹೊರಡಿಸಿದೆ.

ಕರ್ನಾಟಕ ಸರ್ಕಾರದ ಒಳಾಡಳಿತ ಇಲಾಖೆ (ಅಪರಾಧಗಳು) ದಿನಾಂಕ 30-10-2026 ರಂದು ಆದೇಶ ಸಂಖ್ಯೆ: ಹೆಚ್‌ಸಿಡಿ 228 ಸಿಒಡಿ 2026 ರಂತೆ ಈ ತಿದ್ದುಪಡಿ ಆದೇಶವನ್ನು ಪ್ರಕಟಿಸಿದೆ.

ಸೆಪ್ಟೆಂಬರ್ 24, 2026 ರಂದು ಹೊರಡಿಸಿದ್ದ ಮೂಲ ಆದೇಶದ ಕೋಷ್ಟಕದ ಕ್ರಮ ಸಂಖ್ಯೆ 01 ಮತ್ತು 05 ರಲ್ಲಿದ್ದ ಅಧಿಕಾರಿಗಳನ್ನು ಬದಲಾಯಿಸಲಾಗಿದೆ.

ತಿದ್ದುಪಡಿ ಆದೇಶದ ಪ್ರಕಾರ:

  1. ಶ್ರೀ ಚೇತನ್ ಸಿಂಗ್ ರಾಥೋಡ್, ಐಪಿಎಸ್, ಐಜಿಪಿ, ಸಿಐಡಿ, ಬೆಂಗಳೂರು – ಮುಖ್ಯಸ್ಥರಾಗಿ ನೇಮಕ
  2. ಶ್ರೀ ಶ್ರೀನಿಧಿ, ಹೆಚ್ಚುವರಿ ಪೊಲೀಸ್ ಅಧೀಕ್ಷಕರು, ಹಾಸನ ಜಿಲ್ಲೆ – ಸದಸ್ಯರಾಗಿ ನೇಮಕ

ಈ ಇಬ್ಬರು ಅಧಿಕಾರಿಗಳನ್ನು ಹೊರತುಪಡಿಸಿ ಉಳಿದ ಆದೇಶದಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸರ್ಕಾರದ ಅಧೀನ ಕಾರ್ಯದರ್ಶಿ ಎಸ್.ಅಂಬಿಕಾ ಅವರ ಸಹಿಯಿರುವ ಆದೇಶದಲ್ಲಿ ಸ್ಪಷ್ಟಪಡಿಸಲಾಗಿದೆ.

ಈ ಆದೇಶದ ಪ್ರತಿಯನ್ನು ಡಿಜಿ & ಐಜಿಪಿ, ಸಿಐಡಿ ಮುಖ್ಯಸ್ಥರು ಸೇರಿದಂತೆ ಸಂಬಂಧಪಟ್ಟ ಎಲ್ಲಾ ಪೊಲೀಸ್ ಅಧಿಕಾರಿಗಳಿಗೆ ರವಾನಿಸಲಾಗಿದೆ.

Continue Reading

Belthangady

ಸೌಜನ್ಯ ಕೇಸ್ ಮರುತನಿಖೆಗೆ ಬಿಗ್ ಟ್ವಿಸ್ಟ್: ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ಹಿಂದೆ ಸರಿದ ಐಜಿಪಿ ಶಶಿಕುಮಾರ್!

Published

on

ಬೆಂಗಳೂರು: ಧರ್ಮಸ್ಥಳದ ಬಹುಚರ್ಚಿತ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ ವಿಶೇಷ ತನಿಖಾ ತಂಡದ (SIT) ಮರುತನಿಖೆ ಬಿರುಸಿನಿಂದ ಸಾಗುತ್ತಿರುವ ನಡುವೆಯೇ ಮಹತ್ವದ ಬೆಳವಣಿಗೆಯೊಂದು ಸಂಭವಿಸಿದೆ. ಎಸ್‌ಐಟಿ ಮುಖ್ಯಸ್ಥ ಸ್ಥಾನದಿಂದ ತಮ್ಮನ್ನು ಮುಕ್ತಗೊಳಿಸುವಂತೆ ಹಿರಿಯ ಐಪಿಎಸ್ ಅಧಿಕಾರಿ, ಐಜಿಪಿ ಎನ್. ಶಶಿಕುಮಾರ್ ಅವರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ (DG-IGP) ಲಿಖಿತ ಮನವಿ ಸಲ್ಲಿಸಿದ್ದಾರೆ.

ಹೋರಾಟಗಾರರ ಅಪಸ್ವರ ಮತ್ತು ವಿರೋಧ: ಸೌಜನ್ಯ ಕುಟುಂಬಸ್ಥರು ಹಾಗೂ ನ್ಯಾಯಕ್ಕಾಗಿ ಹೋರಾಡುತ್ತಿರುವ ಸಂಘಟನೆಗಳು ಐಜಿಪಿ ಶಶಿಕುಮಾರ್ ಅವರ ನೇಮಕಾತಿಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದವು. ಶಶಿಕುಮಾರ್ ಅವರು ಹಿಂದೆ ಮಂಗಳೂರು ಪೊಲೀಸ್ ಕಮಿಷನರ್ ಆಗಿ ಸೇವೆ ಸಲ್ಲಿಸಿದ್ದ ವೇಳೆ ಸ್ಥಳೀಯ ಪ್ರಭಾವಿಗಳೊಂದಿಗೆ ಒಡನಾಟ ಹೊಂದಿದ್ದರು, ಹೀಗಾಗಿ ಅವರಿಂದ ನಿಷ್ಪಕ್ಷಪಾತ ತನಿಖೆ ಸಾಧ್ಯವಿಲ್ಲ ಎಂದು ಹೋರಾಟಗಾರರು ಆರೋಪಿಸಿದ್ದರು. ಇತ್ತೀಚೆಗೆ ಹೋರಾಟಗಾರರ ನಿಯೋಗವು ಗೃಹ ಸಚಿವರನ್ನು ಭೇಟಿಯಾಗಿ ಎಸ್‌ಐಟಿ ಮುಖ್ಯಸ್ಥರನ್ನು ಬದಲಾಯಿಸುವಂತೆ ಒತ್ತಾಯಿಸಿತ್ತಲ್ಲದೆ, ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಸುಪ್ರೀಂ ಕೋರ್ಟ್ ಮೊರೆ ಹೋಗುವುದಾಗಿಯೂ ಎಚ್ಚರಿಸಿತ್ತು.

ತನಿಖೆಯ ಪಾರದರ್ಶಕತೆಗಾಗಿ ನಿರ್ಧಾರ: ಸಾರ್ವಜನಿಕ ವಲಯದಲ್ಲಿ ಎದ್ದಿರುವ ಅಪಸ್ವರಗಳು ಹಾಗೂ ತನಿಖೆಯ ಪಾರದರ್ಶಕತೆಯನ್ನು ಕಾಯ್ದುಕೊಳ್ಳುವ ನಿಟ್ಟಿನಲ್ಲಿ ಶಶಿಕುಮಾರ್ ಅವರು ಸ್ವತಃ ತಾವೇ ಈ ಜವಾಬ್ದಾರಿಯಿಂದ ಕೈಬಿಡುವಂತೆ ಡಿಜಿ-ಐಜಿಪಿ ಎಂ.ಎ. ಸಲೀಂ ಅವರಿಗೆ ಪತ್ರ ಬರೆದಿದ್ದಾರೆ ಎನ್ನಲಾಗಿದೆ.

ವಿಶೇಷವೆಂದರೆ, ಅಕ್ಟೋಬರ್ 28 ರಂದು ಶಶಿಕುಮಾರ್ ಅವರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿಯಾಗಿ ಮರುತನಿಖೆಯ ಪ್ರಗತಿ ಕುರಿತು ಮಾಹಿತಿ ನೀಡಿದ್ದರು. ಅಲ್ಲದೆ, ಅಕ್ಟೋಬರ್ 30 ರಂದು ಆರಂಭಿಕ ತನಿಖಾಧಿಕಾರಿಗಳು ಹಾಗೂ ಮರಣೋತ್ತರ ಪರೀಕ್ಷೆ ನಡೆಸಿದ್ದ ವೈದ್ಯರಿಗೆ ಎಸ್‌ಐಟಿ ವಿಚಾರಣೆಗೆ ಹಾಜರಾಗಲು ಸಮನ್ಸ್ ಜಾರಿಗೊಳಿಸಿತ್ತು. ಈ ಹಂತದಲ್ಲೇ ಮುಖ್ಯಸ್ಥರು ಹಿಂದೆ ಸರಿಯಲು ಮನವಿ ಮಾಡಿರುವುದು ಕುತೂಹಲ ಮೂಡಿಸಿದೆ.

ಈಗಾಗಲೇ ತಂಡದ ಮತ್ತೊಬ್ಬ ಪ್ರಮುಖ ಸದಸ್ಯರಾದ ಹೆಚ್ಚುವರಿ ಎಸ್ಪಿ ವೆಂಕಟೇಶ್ ಪ್ರಸನ್ನ ಅವರು ವೈಯಕ್ತಿಕ ಕಾರಣಗಳಿಂದ ಹೊರಬಂದಿದ್ದು, ಇದೀಗ ಮುಖ್ಯಸ್ಥರೂ ವಿನಾಯಿತಿ ಕೋರಿರುವುದರಿಂದ ರಾಜ್ಯ ಸರ್ಕಾರವು ಶೀಘ್ರದಲ್ಲೇ ಎಸ್‌ಐಟಿಗೆ ನೂತನ ದಕ್ಷ ಅಧಿಕಾರಿಯನ್ನು ನೇಮಕ ಮಾಡುವ ಸಾಧ್ಯತೆಯಿದೆ

Continue Reading

ads (2)
ads (3)
ads (4)
ads (5)
ads (6)
ads (1)
ads (8)
ads (7)

Trending

Copyright © 2025 Deevatige

error: Content is protected !!