ಮಂಗಳೂರು: ಭಾರತೀಯ ಹವಾಮಾನ ಇಲಾಖೆ ಹಾಗೂ ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯ ಪುತ್ತೂರು ಉಪವಿಭಾಗದಲ್ಲಿ ವ್ಯಾಪಕ ಮಳೆಯಾಗುತ್ತಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಆಗಸ್ಟ್ 8, 2026 (ಶನಿವಾರ) ರಂದು ಪುತ್ತೂರು ಉಪವಿಭಾಗದ ವ್ಯಾಪ್ತಿಯ ಎಲ್ಲಾ ಶಾಲಾ-ಕಾಲೇಜುಗಳಿಗೆ ಜಿಲ್ಲಾಡಳಿತ ರಜೆ ಘೋಷಿಸಿದೆ.
ದಕ್ಷಿಣ ಕನ್ನಡ ಜಿಲ್ಲಾ ವಿಕೋಪ ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರೂ ಆಗಿರುವ ಜಿಲ್ಲಾಧಿಕಾರಿಗಳು ಈ ಕುರಿತು ಅಧಿಕೃತ ಆದೇಶ ಹೊರಡಿಸಿದ್ದಾರೆ.
ರಜೆ ಎಲ್ಲೆಲ್ಲಿ ಅನ್ವಯ?
ತಾಲೂಕುಗಳು: ಪುತ್ತೂರು, ಬೆಳ್ತಂಗಡಿ, ಸುಳ್ಯ ಮತ್ತು ಕಡಬ ತಾಲೂಕುಗಳು.
ಸಂಸ್ಥೆಗಳು: ಈ ನಾಲ್ಕೂ ತಾಲೂಕುಗಳ ವ್ಯಾಪ್ತಿಯ ಎಲ್ಲಾ ಅಂಗನವಾಡಿ ಕೇಂದ್ರಗಳು, ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಾಥಮಿಕ, ಪ್ರೌಢಶಾಲೆಗಳು, ಪದವಿ ಪೂರ್ವ ಕಾಲೇಜುಗಳು, ITI ಹಾಗೂ ಡಿಪ್ಲೋಮಾ ಕಾಲೇಜುಗಳು (12 ನೇ ತರಗತಿವರೆಗಿನ ಹಾಗೂ ವಸತಿ ಶಾಲಾ-ಕಾಲೇಜುಗಳು ಸೇರಿದಂತೆ).
ಸೂಚನೆ: ಈ ಆದೇಶವನ್ನು ಉಲ್ಲಂಘಿಸುವ ಸಂಸ್ಥೆಗಳ ವಿರುದ್ಧ ‘ವಿಪತ್ತು ನಿರ್ವಹಣಾ ಕಾಯ್ದೆ 2005’ ರ ಪ್ರಕಾರ ಸೂಕ್ತ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಸಲಾಗಿದೆ.
ಜಿಲ್ಲಾಡಳಿತದ ಪ್ರಮುಖ ಮಾರ್ಗದರ್ಶನ ಹಾಗೂ ಮುನ್ನೆಚ್ಚರಿಕೆಗಳು:
ಪೋಷಕರಿಗೆ ಸೂಚನೆ: ನೀರಿರುವ ತಗ್ಗು ಪ್ರದೇಶ, ಕೆರೆ, ನದಿತೀರ ಹಾಗೂ ಸಮುದ್ರ ತೀರಕ್ಕೆ ಮಕ್ಕಳು ತೆರಳದಂತೆ ಪೋಷಕರು ಜಾಗ್ರತೆ ವಹಿಸಬೇಕು.
ಮೀನುಗಾರರಿಗೆ ನಿಷೇಧ: ಸಮುದ್ರ ತೀರದಲ್ಲಿ ಗಾಳಿ-ಮಳೆ ತೀವ್ರವಾಗಿರುವುದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.
ಪ್ರವಾಸಿಗರಿಗೆ ನಿರ್ಬಂಧ: ಪ್ರವಾಸಿಗರು ಮತ್ತು ಸಾರ್ವಜನಿಕರು ಅಪಾಯಕಾರಿ ನದಿತೀರ ಹಾಗೂ ಸಮುದ್ರ ತೀರಕ್ಕೆ ತೆರಳಬಾರದು.
ಅಧಿಕಾರಿಗಳ ಉಪಸ್ಥಿತಿ: ಜಿಲ್ಲಾ ಹಾಗೂ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಕೇಂದ್ರ ಸ್ಥಾನದಲ್ಲಿದ್ದು, ವಿಪತ್ತು ನಿರ್ವಹಣಾ ಕಾರ್ಯಗಳನ್ನು ತಕ್ಷಣವೇ ಕೈಗೊಳ್ಳಲು ಸೂಚಿಸಲಾಗಿದೆ.
ಕಾಳಜಿ ಕೇಂದ್ರಗಳು: ತಾಲೂಕು ಮಟ್ಟದಲ್ಲಿ ಅಗತ್ಯವಿರುವ ಕಡೆ ಕಾಳಜಿ ಕೇಂದ್ರಗಳನ್ನು ತೆರೆದು ಸಜ್ಜುಗೊಳಿಸಲು ಸಂಬಂಧಪಟ್ಟ ಇಲಾಖಾ ಅಧಿಕಾರಿಗಳಿಗೆ ನಿರ್ದೇಶನ ನೀಡಲಾಗಿದೆ.
ತುರ್ತು ನೆರವಿಗಾಗಿ ಹೆಲ್ಪ್ಲೈನ್ ಸಂಖ್ಯೆಗಳು:
ಪ್ರಕೃತಿ ವಿಕೋಪಕ್ಕೆ ಸಂಬಂಧಿಸಿದ ಯಾವುದೇ ತುರ್ತು ಪರಿಸ್ಥಿತಿ ಅಥವಾ ಸಮಸ್ಯೆಗಳಿದ್ದಲ್ಲಿ ಸಾರ್ವಜನಿಕರು ಈ ಕೆಳಗಿನ ಸಂಖ್ಯೆಗಳನ್ನು ಸಂಪರ್ಕಿಸಬಹುದು:
ಬಂಟ್ವಾಳ ಹಿಂದುತ್ವ ವಿವಾದ: ಶಾಸಕರ ವಿರುದ್ಧದ ಹೇಳಿಕೆಗೆ ಬಿಜೆಪಿ ಮುಖಂಡ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ತೀವ್ರ ಆಕ್ರೋಶ;
ಬಂಟ್ವಾಳ: ಹಿಂದುತ್ವ ಸಂಘಟನೆಗಳ ಕಾರ್ಯಕರ್ತರ ವಿರುದ್ಧ ಗೂಂಡಾ ಕಾಯ್ದೆ ದಾಖಲಿಸಿ ಬಂಧಿಸಿರುವುದನ್ನು ವಿರೋಧಿಸಿ ವಿಎಚ್ಪಿ (VHP) ಮತ್ತು ಬಜರಂಗದಳದಿಂದ ಇತ್ತೀಚೆಗೆ ನಡೆದ ಪ್ರತಿಭಟನಾ ಸಭೆಯು ಕರಾವಳಿ ರಾಜಕೀಯದಲ್ಲಿ ಭಾರೀ ಬಿರುಸಿಗೆ ಕಾರಣವಾಗಿದೆ. ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಮುಖಂಡರೊಬ್ಬರು ಸ್ಥಳೀಯ ಜನಪ್ರತಿನಿಧಿಗಳ ವಿರುದ್ಧ ಹರಿಹಾಯ್ದರೆ, ಇದಕ್ಕೆ ಪ್ರತಿಯಾಗಿ ಬಿಜೆಪಿ ಮುಖಂಡರೊಬ್ಬರ ಹೆಸರಿನಲ್ಲಿ ಹರಿದಾಡುತ್ತಿರುವ ಆಡಿಯೋ ಕ್ಲಿಪ್ ಈಗ ರಾಜಕೀಯ ವಲಯದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದೆ.
ಬಿ.ಸಿ. ರೋಡ್ ಸಭೆ: ಕರಾವಳಿ ನಾಯಕರ ವಿರುದ್ಧ ಸತೀಶ್ ದಾವಣಗೆರೆ ಆಕ್ರೋಶ ಬಿ.ಸಿ.ರೋಡಿನ ರಕ್ತೇಶ್ವರಿ ಸನ್ನಿಧಿ ಬಳಿ ನಡೆದ ಪ್ರತಿಭಟನಾ ಸಭೆಯಲ್ಲಿ ಹಿಂದೂ ಜಾಗರಣ ವೇದಿಕೆಯ ಪ್ರಾಂತ ಸಹ ಸಂಯೋಜಕ ಸತೀಶ್ ದಾವಣಗೆರೆ ಅವರು ಕರಾವಳಿಯ ಬಿಜೆಪಿ ಶಾಸಕರು ಹಾಗೂ ಸಂಸದರ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದರು. “ನೀವು ಇಂದು ಆಡಳಿತದಲ್ಲಿದ್ದೀರಿ ಮತ್ತು ಗೆದ್ದಿದ್ದೀರಿ ಎಂದಾದರೆ ಅದು ಈ ಕೇಸರಿ ಕಾರ್ಯಕರ್ತರಿಂದಲೇ” ಎಂದು ನೆನಪಿಸಿದ ಅವರು, ಸ್ಥಳೀಯ ಶಾಸಕರು ಸರ್ಕಾರದ ಗಮನಕ್ಕೆ ಕರಾವಳಿಯ ವಾಸ್ತವಿಕ ವಿಷಯಗಳನ್ನು ತರಬೇಕು ಎಂದು ಆಗ್ರಹಿಸಿದ್ದರು.
ಮುಖ್ಯಮಂತ್ರಿಗಳ ವಿರುದ್ಧ ಏಕವಚನದಲ್ಲಿ ವಾಗ್ದಾಳಿ ನಡೆಸಿದ ಅವರು, “ಕರಾವಳಿ ತೀರದವರು ಅವಲಕ್ಕಿ ಪ್ರಿಯರು. ನಮ್ಮ ಬಾಯಲ್ಲಿ ಅವಲಕ್ಕಿ ಇಟ್ಟಂತೆ ನಮ್ಮ ಶಾಸಕರು ಮತ್ತು ಸಂಸದರೂ ಬಾಯಲ್ಲಿ ಅವಲಕ್ಕಿ ತುಂಬಿಕೊಂಡಿದ್ದಾರೆ” ಎಂದು ಕಟುವಾಗಿ ಟೀಕಿಸಿದ್ದರು.
ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಆಡಿಯೋ ವೈರಲ್ ಸತೀಶ್ ದಾವಣಗೆರೆ ಅವರ ಈ ಹೇಳಿಕೆಗೆ ಬಿಜೆಪಿ ಪ್ರಮುಖರಾದ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರು ತೀವ್ರವಾಗಿ ಪ್ರತಿಕ್ರಿಯಿಸಿದ್ದಾರೆ ಎನ್ನಲಾದ ಆಡಿಯೋ ತುಣುಕು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಕರ್ನಾಟಕ ಬಿಜೆಪಿ ಐಟಿ ಸೆಲ್ನ ಮಾಜಿ ಮುಖ್ಯಸ್ಥ ವಿಕಾಸ್ ಪುತ್ತೂರು ಅವರನ್ನು ಉದ್ದೇಶಿಸಿ ಮಾತನಾಡಿದ್ದಾರೆನ್ನಲಾದ ಈ ಆಡಿಯೋದಲ್ಲಿ, ಕರಾವಳಿ ಭಾಗದ ನಾಯಕರ ವಿರುದ್ಧ ಹೊರಗಿನಿಂದ ಬಂದು ಪಾಠ ಮಾಡುವುದನ್ನು ಖಂಡಿಸಲಾಗಿದೆ.
“ಮೊನ್ನೆ ದಾವಣಗೆರೆಯಲ್ಲಿ ನಡೆದ ಉಪಚುನಾವಣೆಯಲ್ಲಿ ಮುಸ್ಲಿಮರೆಲ್ಲರೂ ಒಗ್ಗೂಡಿ ಕಾಂಗ್ರೆಸ್ ಪರ ಮತ ಹಾಕಿದ್ದರೂ ಅಲ್ಲಿ ಕಾಂಗ್ರೆಸ್ ಗೆದ್ದಿದೆ. ಅಲ್ಲಿ ಜಾತಿ ರಾಜಕಾರಣ ಮಾಡಿ, ಜಾತಿಗೆ ಮತ ಕೊಟ್ಟವರು ಇಲ್ಲಿಗೆ ಬಂದು ನಮಗೆ ಹಿಂದುತ್ವದ ಬೋಧನೆ ಮಾಡುತ್ತಾರೆ” ಎಂದು ಆಡಿಯೋದಲ್ಲಿ ತೀವ್ರ ಅಸಮಾಧಾನ ವ್ಯಕ್ತಪಡಿಸಲಾಗಿದೆ.
ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರ ಮತ್ತೊಂದು ಆಡಿಯೋ ವೈರಲ್: ಮುಖಂಡರ ಅಸಮಾಧಾನ
ಸತೀಶ್ ದಾವಣಗೆರೆ ಅವರ ಈ ಹೇಳಿಕೆಗೆ ತೀವ್ರ ಪ್ರತಿಕ್ರಿಯೆ ನೀಡಿರುವ ಬಿಜೆಪಿ ಪ್ರಮುಖ ಕೃಷ್ಣಪ್ಪ ಕಲ್ಲಡ್ಕ ಅವರ ಆಡಿಯೋ ಈಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿರುವಾಗಲೇ ಅದನ್ನು ಸಮರ್ಥಿಸಿಕೊಂಡ ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಅವರ ಇನ್ನೊಂದು ಆಡಿಯೋ ವೈರಲ್ ಆಗಿದೆ. ಈ ಕುರಿತು ಆಡಿಯೋದಲ್ಲಿ ಅವರು ಮಾತನಾಡಿರುವ ಮುಖ್ಯಾಂಶಗಳು ಹೀಗಿವೆ:
ಪ್ರತಿಭಟನಾ ಹೇಳಿಕೆಗೆ ಆಕ್ಷೇಪ: ಬಿಸಿರೋಡಿನಲ್ಲಿ ನಡೆದ ಪ್ರತಿಭಟನಾ ಸಭೆಯಲ್ಲಿ ಸತೀಶ್ ದಾವಣಗೆರೆ ಅವರು ಮಾತನಾಡಿದ ಕೆಲವು ವಿಚಾರಗಳು ಸಂಪೂರ್ಣ ತಪ್ಪು ಎಂದು ಕೃಷ್ಣಪ್ಪ ಪೂಜಾರಿ ಕಲ್ಲಡ್ಕ ಗಂಟಾಘೋಷವಾಗಿ ತಿಳಿಸಿದ್ದಾರೆ.
ನಳಿನ್ ಕುಮಾರ್ ಕಟೀಲ್ ಸೇವೆ ಸ್ಮರಣೆ: ಹಿಂದೂ ಸಮಾಜ, ಸಂಘಟನೆ ಹಾಗೂ ಕಾರ್ಯಕರ್ತರಿಗೆ ಎಲ್ಲಾ ರೀತಿಯ ಸಹಾಯ ಮಾಡಿರುವ ಮಾಜಿ ಸಂಸದ ನಳಿನ್ ಕುಮಾರ್ ಕಟೀಲ್ ರವರನ್ನು ಹಿಂದೂ ನಾಯಕರು ಮಾತನಾಡಿ ಮುಗಿಸಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇಷ್ಟು ವರ್ಷಗಳಿಂದ ಸಂಘಪರಿವಾರಕ್ಕಾಗಿ ದುಡಿದ ನಳಿನ್ ಕುಮಾರ್ ಕಟೀಲ್, ಸತ್ಯಜಿತ್ ಹಾಗೂ ಅರುಣ್ ಕುಮಾರ್ ಪುತ್ತಿಲರಂತಹ ನಾಯಕರನ್ನು ಎಲ್ಲಿಡಲಾಗಿದೆ ಎಂದು ಪ್ರಶ್ನಿಸಿದ್ದಾರೆ.
ಪಕ್ಷ ಮತ್ತು ಸಂಘಟನೆಗೆ ಎಚ್ಚರಿಕೆ: ಈಗ ಮತ್ತೊಮ್ಮೆ ಕಷ್ಟದ ಸಂದರ್ಭದಲ್ಲಿ ಬಿಜೆಪಿ ಸಂಘಟನೆ ಇದ್ದು, ಬಿಸಿರೋಡಿನಲ್ಲಿ ಹಿಂದೂ ನಾಯಕರೊಬ್ಬರು ಎಲ್ಲಾ ಶಾಸಕರು ಹಾಗೂ ಎಂ.ಪಿ.ಗಳನ್ನು ದೂಷಿಸಿದರೆ ಪಕ್ಷ ಮತ್ತು ಸಂಘಟನೆ ಹೇಗೆ ಉಳಿಯುತ್ತದೆ ಎಂದು ಆತಂಕ ವ್ಯಕ್ತಪಡಿಸಿದ್ದಾರೆ. ‘ನಾವು ಏನಾದರೂ ಸತ್ಯ ಹೇಳಿದರೆ ಅದಕ್ಕೂ ದೂರು ನೀಡಿ CCB ಪೊಲೀಸರನ್ನು ಮನೆಗೆ ಕಳುಹಿಸುತ್ತೀರಿ’ ಎಂದು ಆರೋಪಿಸಿದ್ದಾರೆ.
ಸಮನ್ವಯಕ್ಕೆ ಆಗ್ರಹ: ಪ್ರತಾಪ್ ಸಿಂಹ, ಕೆ.ಎಸ್. ಈಶ್ವರಪ್ಪ ಮತ್ತು ಅನಂತ್ ಕುಮಾರ್ ಹೆಗಡೆ ಅವರಂತಹ ಮುಖಂಡರನ್ನು ಕುಳಿತು ಮಾತನಾಡಿಸಿ, ಸಮನ್ವಯ ಸಮಿತಿ ಮಾಡಿಕೊಂಡು ಇಡೀ ಹಿಂದೂ ಸಮಾಜದ ಎಲ್ಲರನ್ನು ಒಟ್ಟು ಮಾಡುವುದು ಬಿಟ್ಟು ಜನಪ್ರತಿನಿಧಿಗಳಿಗೆ ಅವಮಾನ ಮಾಡುವುದು ಸರಿಯಲ್ಲ ಎಂದು ಆಡಿಯೋದಲ್ಲಿ ಖಂಡಿಸಲಾಗಿದೆ.
“ಇನ್ನು ಮುಂದೆ ಸಂಘಟನೆಗೆ ಆರ್ಥಿಕ ಸಹಕಾರವಿಲ್ಲ” – ಎಚ್ಚರಿಕೆ ಆಡಿಯೋ ಮುಂದುವರಿದು, “ಇವರೆಲ್ಲ ಇಲ್ಲಿ ಬಂದು ನಮಗೆ ಹಿಂದುತ್ವದ ಪಾಠ ಮಾಡಲು ಹೊರಟಿದ್ದಾರೆ. ಇದು ನಮ್ಮ ಭದ್ರಕೋಟೆ, ನಾವು ಹಿಂದುತ್ವಕ್ಕೆ ಸೇವೆ ಸಲ್ಲಿಸಿ ಸಾಕೋ ಸಾಕಾಗಿದೆ” ಎಂದು ಆಕ್ರೋಶ ಹೊರಹಾಕಲಾಗಿದೆ. ಇಂಥವರಿಗೆ ಸಂಘ ಪರಿವಾರದಲ್ಲಿ ಯಾವುದೇ ಜವಾಬ್ದಾರಿ ನೀಡಬಾರದು ಎಂದೂ, ಇವರ ಪ್ರವಾಸಗಳು ಮುಂದುವರಿದರೆ ಪಕ್ಷಕ್ಕೆ ಹಿನ್ನಡೆಯಾಗಲಿದೆ ಎಂದೂ ಎಚ್ಚರಿಸಲಾಗಿದೆ.
ಈ ಹೇಳಿಕೆಗಳನ್ನು ಈಗ ಕಾಂಗ್ರೆಸ್ ಪಕ್ಷವು ಅಸ್ತ್ರವಾಗಿ ಬಳಸಿ ಕಟ್ ಮಾಡಿ ಪ್ರಚಾರ ಮಾಡುತ್ತಿದೆ ಎಂದು ಕಳವಳ ವ್ಯಕ್ತಪಡಿಸಿರುವ ಆಡಿಯೋದಲ್ಲಿ, “ದಾವಣಗೆರೆಯವರು ತಕ್ಷಣ ಪತ್ರಿಕಾಗೋಷ್ಠಿ ನಡೆಸಿ ಸ್ಪಷ್ಟನೆ ನೀಡಬೇಕು” ಎಂದು ಆಗ್ರಹಿಸಲಾಗಿದೆ. ಕೊನೆಯಲ್ಲಿ, “ಇನ್ನು ಮುಂದೆ ನಾವು ಸಂಘಟನೆಗೆ ಒಂದು ರೂಪಾಯಿಯ ಸಹಕಾರ ಮಾಡುವುದಿಲ್ಲ, ಸಂಘಟನೆಯ ಕಾರ್ಯಕ್ರಮಕ್ಕೂ ಬರುವುದಿಲ್ಲ. ನಾವು ಬಿಜೆಪಿ, ಅಷ್ಟೇ” ಎಂದು ಸ್ಪಷ್ಟಪಡಿಸಿರುವುದು ರಾಜಕೀಯ ವಲಯದಲ್ಲಿ ತೀವ್ರ ಸಂಚಲನ ಮೂಡಿಸಿದೆ.
ಮಂಗಳೂರು: ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಕರಾವಳಿ ಜಿಲ್ಲೆಗಳಿಗೆ ಘೋಷಿಸಲಾಗಿರುವ ಎಲ್ಲ ಯೋಜನೆಗಳನ್ನೂ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಲು ರಾಜ್ಯ ಸರ್ಕಾರ ಸಂಪೂರ್ಣ ಬದ್ಧವಾಗಿದೆ ಎಂದು ದಕ್ಷಿಣ ಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಯು.ಟಿ. ಖಾದರ್ ತಿಳಿಸಿದ್ದಾರೆ.
ಮಂಗಳೂರಿನ ಸರ್ಕ್ಯೂಟ್ ಹೌಸ್ನಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಯೋಜನೆಗಳಿಗೆ ಅನುದಾನದ ಕೊರತೆ ಉಂಟಾಗುವುದಿಲ್ಲ ಎಂದು ಸ್ಪಷ್ಟಪಡಿಸಿದರು.
ಪ್ರಮುಖ ಮುಖ್ಯಾಂಶಗಳು:
ಅನುದಾನದ ಕೊರತೆಯಿಲ್ಲ: ಆರ್ಥಿಕ ಇಲಾಖೆಯು ಪ್ರತಿ ಮೂರು ಅಥವಾ ಆರು ತಿಂಗಳಿಗೊಮ್ಮೆ ರಾಜ್ಯದ ಆರ್ಥಿಕ ಪರಿಸ್ಥಿತಿಯ ಬಗ್ಗೆ ಮಾಹಿತಿ ನೀಡುವುದು ಆಡಳಿತಾತ್ಮಕ ಪ್ರಕ್ರಿಯೆಯಾಗಿದ್ದು, ಘೋಷಿತ ಯೋಜನೆಗಳನ್ನು ಕಾಲಮಿತಿಯಲ್ಲಿ ಜಾರಿಗೊಳಿಸುವುದು ಸರ್ಕಾರದ ಜವಾಬ್ದಾರಿಯಾಗಿದೆ ಎಂದರು.
ಬಿಜೆಪಿ ನಾಯಕರಿಗೆ ಸವಾಲು: ಬಿಜೆಪಿ ತಮ್ಮ ಆಡಳಿತ ಅವಧಿಯಲ್ಲಿ ಕರಾವಳಿಗಾಗಿ ಏನು ಮಾಡಿದೆ ಎಂಬುದನ್ನು ಸ್ಪಷ್ಟಪಡಿಸಲಿ. ಕನಿಷ್ಠ ಕರಾವಳಿಯಲ್ಲಿ ಸಚಿವ ಸಂಪುಟ ಸಭೆಯನ್ನಾದರೂ ಮಾಡಿದ್ದಾರೆಯೇ ಎಂದು ಪ್ರಶ್ನಿಸಿದ ಅವರು, ಸುಮ್ಮನೆ ರಾಜಕೀಯ ಆರೋಪಗಳನ್ನು ಮಾಡುವುದನ್ನು ಬಿಟ್ಟು ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾತನಾಡಲಿ ಎಂದು ಸವಾಲುಹಾಕಿದರು.
ತುಳು ಭಾಷೆಗೆ ಮಾನ್ಯತೆ: ತುಳು ಭಾಷೆಗೆ ಮಾನ್ಯತೆ ನೀಡುವ ಡಾ. ಎಂ. ಮೋಹನ್ ಆಳ್ವ ತಂಡದ ವರದಿ ಹಿಂದಿನ ಬಿಜೆಪಿ ಸರ್ಕಾರದ ಅವಧಿಯಲ್ಲೇ ಇದ್ದರೂ ಅಂದಿನ ಸಚಿವರಾಗಿದ್ದವರು ಸಹಿ ಹಾಕಲು ಧೈರ್ಯ ಮಾಡಿರಲಿಲ್ಲ. ಆದರೆ ಮುಖ್ಯಮಂತ್ರಿಗಳು ಆ ಧೈರ್ಯ ಮಾಡಿದ್ದು, ಕರಾವಳಿಯ ಜನತೆ ಇದನ್ನು ಗಮನಿಸುತ್ತಿದ್ದಾರೆ ಎಂದರು.
ವೆನ್ಲಾಕ್ ಆಸ್ಪತ್ರೆ ಒತ್ತಡ ನಿಯಂತ್ರಣಕ್ಕೆ ಕ್ರಮ: ವೆನ್ಲಾಕ್ ಆಸ್ಪತ್ರೆಗೆ ಹೆಚ್ಚುತ್ತಿರುವ ರೋಗಿಗಳ ಒತ್ತಡವನ್ನು ಕಡಿಮೆ ಮಾಡಲು ಸ್ಟ್ಯಾಂಡರ್ಡ್ ಆಪರೇಷನ್ ಪ್ರೊಸೀಜರ್ (ಎಸ್ಒಪಿ) ರೂಪಿಸಲು ಸೂಚಿಸಲಾಗಿದೆ. ತುರ್ತು ಸಂದರ್ಭಗಳನ್ನು ಹೊರತುಪಡಿಸಿ, ಇತರೆ ರೋಗಿಗಳಿಗೆ ಸ್ಥಳೀಯ ತಾಲೂಕು ಆಸ್ಪತ್ರೆಗಳಲ್ಲೇ ಚಿಕಿತ್ಸೆ ಸಿಗುವಂತೆ ತಾಲೂಕು ಆಸ್ಪತ್ರೆಗಳನ್ನು ಬಲಪಡಿಸಲಾಗುವುದು. ಜೊತೆಗೆ ಬೈಂದೂರು ಮತ್ತು ಮೂಡಬಿದ್ರೆಯಲ್ಲಿ ಹೊಸ ತಾಲೂಕು ಆಸ್ಪತ್ರೆ ಹಾಗೂ ಭಟ್ಕಳ ತಾಲೂಕು ಆಸ್ಪತ್ರೆಯನ್ನು ಮೇಲ್ದರ್ಜೆಗೇರಿಸಲು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದರು
ಮಂಗಳೂರು: ವಂಚನೆ ಪ್ರಕರಣವೊಂದರಲ್ಲಿ ವಶಪಡಿಸಿಕೊಂಡಿದ್ದ ಹಣವನ್ನು ಬಿಡುಗಡೆ ಮಾಡಲು ಲಂಚಕ್ಕೆ ಬೇಡಿಕೆ ಇಟ್ಟಿದ್ದ ಬಜ್ಪೆ ಪೊಲೀಸ್ ಠಾಣೆಯ ಪೊಲೀಸ್ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಕಾರ್ಯಾಚರಣೆಯ ವಿವರ: ಬಜ್ಜೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ವಂಚನೆ ಪ್ರಕರಣದಲ್ಲಿ ಆರೋಪಿಗಳಿಂದ ಪೊಲೀಸರು ಹಣವನ್ನು ವಶಕ್ಕೆ ಪಡೆದುಕೊಂಡಿದ್ದರು. ಈ ಹಣವನ್ನು ದೂರುದಾರರಿಗೆ ಬಿಡುಗಡೆ ಮಾಡಲು ಇನ್ಸ್ಪೆಕ್ಟರ್ ಬಾಲಕೃಷ್ಣ ಅವರು ಒಟ್ಟು ₹25,000 ಲಂಚದ ಹಣಕ್ಕೆ ಬೇಡಿಕೆ ಇಟ್ಟಿದ್ದರು. ಈ ಪೈಕಿ ಈಗಾಗಲೇ ₹15,000 ಹಣವನ್ನು ಮುಂಗಡವಾಗಿ ಪಡೆದುಕೊಂಡಿದ್ದ ಇನ್ಸ್ಪೆಕ್ಟರ್, ಬಳಿಕ ಹೆಚ್ಚುವರಿಯಾಗಿ ಮತ್ತೊಮ್ಮೆ ₹5,000 ಲಂಚ ನೀಡುವಂತೆ ಪಟ್ಟು ಹಿಡಿದಿದ್ದರು. ಇದರಿಂದ ಬೇಸತ್ತ ಫಿರ್ಯಾದುದಾರರು ಮಂಗಳೂರು ಲೋಕಾಯುಕ್ತ ಪೊಲೀಸ್ ಠಾಣೆಗೆ ದೂರು ನೀಡಿದ್ದರು. ದೂರಿನ ಅನ್ವಯ ಸೆಪ್ಟೆಂಬರ್ 21ರ ಸಂಜೆ ಕಾರ್ಯಾಚರಣೆ ನಡೆಸಿದ ಲೋಕಾಯುಕ್ತ ಪೊಲೀಸರು, ದೂರುದಾರರಿಂದ ₹5,000 ಲಂಚ ಸ್ವೀಕರಿಸುತ್ತಿದ್ದ ವೇಳೆಯಲ್ಲೇ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರನ್ನು ರೆಡ್ ಹ್ಯಾಂಡ್ ಆಗಿ ಹಿಡಿದು ವಶಕ್ಕೆ ಪಡೆದಿದ್ದಾರೆ. ಪ್ರಸ್ತುತ ಲೋಕಾಯುಕ್ತ ಪೊಲೀಸರು ಮುಂದಿನ ಕಾನೂನು ಕ್ರಮ ಹಾಗೂ ತನಿಖೆಯನ್ನು ಕೈಗೊಂಡಿದ್ದಾರೆ.
ಹಿನ್ನೆಲೆ ಮತ್ತು ಹಳೆಯ ಆರೋಪಗಳು: ಈ ಹಿಂದೆ ಉಳ್ಳಾಲ ಠಾಣೆಯಲ್ಲಿದ್ದಾಗಲೂ ಬಾಲಕೃಷ್ಣ ಅವರ ಮೇಲೆ ಭ್ರಷ್ಟಾಚಾರದ ಸಾಲು ಸಾಲು ಆರೋಪಗಳು ಕೇಳಿಬಂದಿದ್ದವು: ಕಳ್ಳತನ ಪ್ರಕರಣದಲ್ಲಿ ಲಂಚ: ಉಳ್ಳಾಲದ ಮನೆಯೊಂದರಲ್ಲಿ ₹15 ಲಕ್ಷ ಮೌಲ್ಯದ ಚಿನ್ನಾಭರಣ ಕಳ್ಳತನವಾದ ಪ್ರಕರಣದಲ್ಲಿ ಮಾರಾಟ ಮಾಡಿದ್ದ ಚಿನ್ನಾಭರಣ ವಶಪಡಿಸಿಕೊಳ್ಳುವಾಗಲೂ ಲಂಚ ಪಡೆದ ಆರೋಪವಿತ್ತು.
ಪ್ರಕರಣ ಮುಚ್ಚಿಹಾಕಲು ದಂಧೆ: ಬೆಳ್ತಂಗಡಿ ಮೂಲದ ಯುವಕನೊಬ್ಬನ ತಾಯಿಯಿಂದ ಪ್ರಕರಣ ಮುಚ್ಚಿಹಾಕಲು ₹3 ಲಕ್ಷ ರೂಪಾಯಿ ಪೀಕಿಸಿದ್ದಲ್ಲದೆ, ಮಗನ ಚಿನ್ನಾಭರಣ ಎಗರಿಸಿದ ಆರೋಪ ಕೇಳಿಬಂದಿತ್ತು. ಈ ಕುರಿತು ಅಂದಿನ ಪೊಲೀಸ್ ಕಮಿಷನರ್ಗೆ ದೂರು ನೀಡಿದ್ದಾಗ, ಇಲಾಖಾ ವಿಚಾರಣೆ ವೇಳೆ ದೂರುದಾರ ಮಹಿಳೆಗೆ ₹4.5 ಲಕ್ಷ ರೂಪಾಯಿ ನೀಡಿ ಕೇಸ್ ಹಿಂಪಡೆಯುವಂತೆ ಮಾಡಿದ್ದರೆನ್ನಲಾಗಿದೆ.
ವರ್ಗಾವಣೆ ನಾಟಕ: ಉಳ್ಳಾಲದ ಮರಳು ದಂಧೆಕೋರರ ಸಾಲಿಗೆ ಸಿಲುಕಿ ವರ್ಗಾವಣೆಯಾಗಿದ್ದ ಇವರು, ಬಳಿಕ ಪಾಂಡೇಶ್ವರ ಮಹಿಳಾ ಠಾಣೆಗೆ ಸೇರಿ, ಪ್ರಸ್ತುತ ಬಜ್ಜೆ ಠಾಣೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.
ಮುಖ್ಯಮಂತ್ರಿ ಪದಕದ ವಿವಾದ.! ಕೋಟೆಕಾರು ಬ್ಯಾಂಕ್ ದರೋಡೆ ಪ್ರಕರಣದಲ್ಲಿ ಇತರೆ ತಂಡಗಳು ಶ್ರಮವಹಿಸಿ ಆರೋಪಿಗಳನ್ನು ಬಂಧಿಸಿದ್ದರೂ, ಅದರ ನೆಪದಲ್ಲಿ ಅಂದಿನ ಇನ್ಸ್ಪೆಕ್ಟರ್ ಬಾಲಕೃಷ್ಣ ಅವರ ಹೆಸರನ್ನು ಮುಖ್ಯಮಂತ್ರಿ ಪದಕಕ್ಕೆ ಶಿಫಾರಸು ಮಾಡಿದ್ದು ಭಾರೀ ಸುದ್ದಿಯಾಗಿತ್ತು.