Connect with us

CONGRESS

ಕೆ.ಆರ್.ಐ.ಡಿ.ಎಲ್ %7 ಕಮಿಷನ್ ಆರೋಪ: ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ, ನಿಗಮದ ವ್ಯವಸ್ಥಾಪಕ ನಿರ್ದೇಶಕರಿಂದ ಸ್ಪಷ್ಟನೆ

Published

on

ಬೆಂಗಳೂರು / ಪುತ್ತೂರು: ಮಂಗಳೂರು ಕೆ.ಆರ್.ಐ.ಡಿ.ಎಲ್ (KRIDL) ವಿಭಾಗದ ಎಂಜಿನಿಯರ್‌ಗಳು ಭ್ರಷ್ಟಾಚಾರದಲ್ಲಿ ತೊಡಗಿದ್ದು, ಸಚಿವರ ಹೆಸರಿನಲ್ಲಿ ಶೇ. 7ರಷ್ಟು ಕಮಿಷನ್ ವಸೂಲಿ ಮಾಡುತ್ತಿದ್ದಾರೆ ಎಂಬ ಆರೋಪಕ್ಕೆ ಸಂಬಂಧಿಸಿದಂತೆ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಈಶ್ವರ್ ಬಿ. ಖಂಡ್ರೆ ತನಿಖೆಗೆ ಆದೇಶಿಸಿದ್ದಾರೆ. ಇನ್ನೊಂದೆಡೆ, ಈ ಕುರಿತು ಕೆ.ಆರ್.ಐ.ಡಿ.ಎಲ್ ವ್ಯವಸ್ಥಾಪಕ ನಿರ್ದೇಶಕರು ಪತ್ರಿಕಾ ಪ್ರಕಟಣೆ ಮೂಲಕ ನಿಯಮಾವಳಿಗಳ ಸ್ಪಷ್ಟನೆ ನೀಡಿದ್ದಾರೆ.‌

ಸಿಎಂಗೆ ಶಾಸಕ ಅಶೋಕ್ ಕುಮಾರ್ ರೈ ಪತ್ರದಲ್ಲಿ ಏನಿದೆ?

ಪುತ್ತೂರು ಶಾಸಕ ಕೆ. ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಬರೆದಿರುವ ಪತ್ರದಲ್ಲಿ ಮಂಗಳೂರು ಕೆ.ಆರ್.ಐ.ಡಿ.ಎಲ್ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ವಿಜಯ್ ಹಾಗೂ ಕಿರಿಯ ಇಂಜಿನಿಯರ್ ಪ್ರಜ್ವಲ್ ವಿರುದ್ಧ ಗಂಭೀರ ಆರೋಪ ಮಾಡಿದ್ದಾರೆ. “ಕಾಮಗಾರಿ ನಿರ್ವಹಿಸುವ ಗುತ್ತಿಗೆದಾರರಿಗೆ ಕಿರುಕುಳ ನೀಡಿ, ಜಿಲ್ಲಾ ಉಸ್ತುವಾರಿ ಸಚಿವರು ಹಾಗೂ ಇಲಾಖೆ ಸಚಿವರಿಗೆ ಮಾಸಿಕವಾಗಿ ಹಣ ಸಂದಾಯ ಮಾಡಬೇಕಾಗುತ್ತದೆ ಎಂದು ಹೇಳಿ, ಕೆ.ಆರ್.ಐ.ಡಿ.ಎಲ್ ಚಾರ್ಜ್ ಹೆಸರಿನಲ್ಲಿ ಶೇ. 7ರಷ್ಟು ಹೆಚ್ಚುವರಿ ಹಣ ಪಡೆಯಲಾಗುತ್ತಿದೆ. ಇದನ್ನು ಪ್ರಶ್ನಿಸಿದ ಗುತ್ತಿಗೆದಾರರಿಗೆ ಬೆದರಿಕೆ ಒಡ್ಡಲಾಗುತ್ತಿದೆ. ಆದ್ದರಿಂದ ಈ ಅಧಿಕಾರಿಗಳ ವಿರುದ್ಧ ಸಮಗ್ರ ಇಲಾಖಾ ತನಿಖೆ ನಡೆಸಿ, ಆರೋಪದ ಗಂಭೀರತೆ ಪರಿಗಣಿಸಿ ತನಿಖೆ ಪೂರ್ಣಗೊಳ್ಳುವವರೆಗೆ ಅವರನ್ನು ಅಮಾನತುಗೊಳಿಸಬೇಕು ಅಥವಾ ಬೇರೆಡೆಗೆ ವರ್ಗಾಯಿಸಬೇಕು. ಆರೋಪ ಸಾಬೀತಾದಲ್ಲಿ ಕಠಿಣ ಶಿಸ್ತು ಕ್ರಮ ಜರುಗಿಸಿ, ಅಕ್ರಮ ಹಣವನ್ನು ವಸೂಲಿ ಮಾಡಿ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಶಾಸಕರು ಮನವಿ ಮಾಡಿದ್ದಾರೆ.

7 ದಿನಗಳಲ್ಲಿ ವರದಿ ಸಲ್ಲಿಸಲು ಸಚಿವರ ಸೂಚನೆ

ಮಂಗಳೂರು ವಿಭಾಗದ ಕೆ.ಆರ್.ಐ.ಡಿ.ಎಲ್ ಕಾರ್ಯನಿರ್ವಾಹಕ ಇಂಜಿನಿಯರ್ ಹಾಗೂ ಕಿರಿಯ ಇಂಜಿನಿಯರ್‌ಗಳು ಭ್ರಷ್ಟಾಚಾರ ನಡೆಸಿ, ಗುತ್ತಿಗೆದಾರರಿಗೆ ಬೆದರಿಕೆ ಒಡ್ಡುತ್ತಿದ್ದಾರೆ ಎಂದು ಪುತ್ತೂರು ಶಾಸಕ ಕೆ. ಅಶೋಕ್ ಕುಮಾರ್ ರೈ ಅವರು ಮುಖ್ಯಮಂತ್ರಿಗಳಿಗೆ ದೂರು ಪತ್ರ ಬರೆದ ವಿಚಾರ ಮಾಧ್ಯಮಗಳಲ್ಲಿ ಪ್ರಸಾರವಾದ ಬೆನ್ನಲ್ಲೇ ಸರ್ಕಾರ ಇದನ್ನು ಅತ್ಯಂತ ಗಂಭೀರವಾಗಿ ಪರಿಗಣಿಸಿದೆ.

ಈ ಕುರಿತು ಟಿಪ್ಪಣಿ ಹೊರಡಿಸಿರುವ ಸಚಿವ ಈಶ್ವರ್ ಖಂಡ್ರೆ, “ಉಸ್ತುವಾರಿ ಅಥವಾ ಇಲಾಖೆಯ ಸಚಿವರ ಹೆಸರಿನಲ್ಲಿ ಯಾವುದೇ ಅಧಿಕಾರಿಗಳು ಅಥವಾ ಇಂಜಿನಿಯರ್‌ಗಳು ಹಣ ವಸೂಲಿ ಮಾಡಿದರೆ ನಿರ್ದಾಕ್ಷಿಣ್ಯವಾಗಿ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ಎಚ್ಚರಿಸಿದ್ದಾರೆ. ಶಾಸಕರು ಮಾಡಿರುವ ಆರೋಪದಲ್ಲಿ ಸತ್ಯಾಂಶವಿದೆಯೇ ಎಂಬುದರ ಕುರಿತು ಸೂಪರಿಂಟೆಂಡೆಂಟ್ ಇಂಜಿನಿಯರ್ ದರ್ಜೆಯ ಅಧಿಕಾರಿಯ ನೇತೃತ್ವದ ತ್ರಿಸದಸ್ಯ ತಂಡದಿಂದ ತನಿಖೆ ನಡೆಸಿ, ಶಿಸ್ತುಕ್ರಮದ ಶಿಫಾರಸಿನೊಂದಿಗೆ 7 ದಿನಗಳ ಒಳಗಾಗಿ ಕಡತದಲ್ಲಿ ವರದಿ ಸಲ್ಲಿಸುವಂತೆ ಇಲಾಖೆಯ ಕಾರ್ಯದರ್ಶಿಯವರಿಗೆ ನಿರ್ದೇಶನ ನೀಡಿದ್ದಾರೆ.

%7 ಜಾಬ್ ಸೇವಿಂಗ್ಸ್ ನಿಯಮಾವಳಿಯ ಭಾಗ: KRIDL ಸ್ಪಷ್ಟನೆ

ಮತ್ತೊಂದೆಡೆ, ಶಾಸಕ ಅಶೋಕ್ ಕುಮಾರ್ ರೈ ಅವರ ಆರೋಪಕ್ಕೆ ಕೆ.ಆರ್.ಐ.ಡಿ.ಎಲ್ (ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಯಮಿತ) ವ್ಯವಸ್ಥಾಪಕ ನಿರ್ದೇಶಕರು ಅಧಿಕೃತ ಪತ್ರಿಕಾ ಪ್ರಕಟಣೆ ಮೂಲಕ ಸ್ಪಷ್ಟನೆ ನೀಡಿದ್ದಾರೆ.

ನಿಯಮಾನುಸಾರ ಕಡಿತ: ಕೆ.ಆರ್.ಐ.ಡಿ.ಎಲ್ ವತಿಯಿಂದ ಕೈಗೊಳ್ಳುವ ಕಾಮಗಾರಿಗಳಿಗೆ ಅಂದಾಜು ವೆಚ್ಚದ ಮೇಲೆ ಶೇ. 3ರಷ್ಟು ಸಂಸ್ಥೆಯ ಸೇವಾ ಶುಲ್ಕ (Service Charges) ಹಾಗೂ PWD ದರಪಟ್ಟಿಯಂತೆ ಶೇ. 10ರಷ್ಟು ಲಾಭಾಂಶದಲ್ಲಿ ಗ್ರೂಪ್ ಲೀಡರ್ ಮೂಲಕ ಕಾಮಗಾರಿ ನಿರ್ವಹಿಸುವುದರಿಂದ ಶೇ. 7ರಷ್ಟು ಹಣವನ್ನು ‘ಜಾಬ್ ಸೇವಿಂಗ್ಸ್’ (Job Savings) ಎಂದು ಕಡಿತಗೊಳಿಸಲಾಗುತ್ತದೆ. ಒಟ್ಟಾರೆಯಾಗಿ ಶೇ. 10ರಷ್ಟು (3% ಸೇವಾ ಶುಲ್ಕ + 7% ಜಾಬ್ ಸೇವಿಂಗ್ಸ್) ಮೊತ್ತವನ್ನು ನಿಯಮಾವಳಿಯಂತೆಯೇ ಸಂಸ್ಥೆಯ ಖಾತೆಗೆ ಜಮೆ ಮಾಡಲಾಗುತ್ತದೆ.

ಸಿಬ್ಬಂದಿ ವೇತನಕ್ಕೆ ಬಳಕೆ: ಕೆ.ಆರ್.ಐ.ಡಿ.ಎಲ್ ಸಂಸ್ಥೆಗೆ ಸರ್ಕಾರದಿಂದ ಯಾವುದೇ ವೇತನ ಅಥವಾ ಆಡಳಿತಾತ್ಮಕ ಅನುದಾನ ಲಭಿಸುವುದಿಲ್ಲ. ಸಂಸ್ಥೆಯಲ್ಲಿರುವ ಸುಮಾರು 1800 ಖಾಯಂ ಮತ್ತು ಹೊರಗುತ್ತಿಗೆ ಸಿಬ್ಬಂದಿಯ ವೇತನ ಹಾಗೂ ಇತರ ಆಡಳಿತಾತ್ಮಕ ವೆಚ್ಚಗಳನ್ನು ಈ ಶೇ. 3 ಸೇವಾ ಶುಲ್ಕ ಮತ್ತು ಶೇ. 7 ಜಾಬ್ ಸೇವಿಂಗ್ಸ್ ಹಣದಿಂದಲೇ ಭರಿಸಲಾಗುತ್ತದೆ.

ಅಧಿಕಾರಿಗಳು ವೈಯಕ್ತಿಕವಾಗಿ ಪಡೆದಿಲ್ಲ: ಶಾಸಕರು ಆರೋಪಿಸಿದಂತೆ ಅಧಿಕಾರಿಗಳು ಹಣವನ್ನು ವೈಯಕ್ತಿಕವಾಗಿ ಕಮಿಷನ್ ರೂಪದಲ್ಲಿ ಪಡೆಯುತ್ತಿಲ್ಲ, ಬದಲಾಗಿ ನಿಯಮಾವಳಿ ಪ್ರಕಾರ ನಿಗಮದ ಅಧಿಕೃತ ಖಾತೆಗೆ ಜಮೆ ಮಾಡುತ್ತಿದ್ದಾರೆ ಎಂದು ಕೆ.ಆರ್.ಐ.ಡಿ.ಎಲ್ ಸ್ಪಷ್ಟಪಡಿಸಿದೆ

ads (2)
ads (3)
ads (4)
ads (5)
ads (6)
ads (1)
ads (8)
ads (7)
ಮುಂದಕ್ಕೆ ಓದಲು ಇಲ್ಲಿ ಕ್ಲಿಕ್‌ ಮಾಡಿ
Advertisement

CONGRESS

ಮಂಗಳೂರು ಹಳೆ ಬಂದರು ಪ್ರದೇಶಕ್ಕೆ ಸಿಎಂ ಭೇಟಿ: ಮೀನುಗಾರಿಕೆ ವ್ಯವಹಾರ ಸ್ಥಗಿತಗೊಳಿಸಿದ್ದಕ್ಕೆ ಆಕ್ರೋಶ, ತನಿಖೆಗೆ ಆದೇಶ

Published

on

ಮಂಗಳೂರು, ಸೆ. 19: ಸಚಿವ ಸಂಪುಟ ಸಭೆಯ ಹಿನ್ನೆಲೆಯಲ್ಲಿ ಶನಿವಾರ ಬೆಳಗ್ಗೆ ಮಂಗಳೂರು ಮೀನುಗಾರಿಕಾ ಧಕ್ಕೆ ಹಳೆ ಬಂದರು ಪ್ರದೇಶಕ್ಕೆ ಭೇಟಿ ನೀಡಿದ ಮುಖ್ಯಮಂತ್ರಿ ಡಿ.ಕೆ. ಶಿವಕಮಾರ್ ಅವರು, ತಮ್ಮ ಭೇಟಿಯ ವೇಳೆ ಮೀನುಗಾರಿಕಾ ವ್ಯವಹಾರ ಹಾಗೂ ಚಟುವಟಿಕೆಗಳನ್ನು ಸ್ಥಗಿತಗೊಳಿಸಿರುವುದಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿ, ಈ ಬಗ್ಗೆ ಕೂಡಲೇ ತನಿಖೆ ನಡೆಸಿ ವರದಿ ನೀಡುವಂತೆ ಜಿಲ್ಲಾಧಿಕಾರಿ ಹಾಗೂ ಪೊಲೀಸ್ ಕಮಿಷನರ್‌ಗೆ ಸೂಚನೆ ನೀಡಿದ್ದಾರೆ.

ಈ ವೇಳೆ ಮಾತನಾಡಿದ ಅವರು, ಅಧಿಕಾರಿಗಳೇ ಅಥವಾ ಪೊಲೀಸರೇ ಚಟುವಟಿಕೆಗಳನ್ನು ನಿಲ್ಲಿಸಿದ್ದರೆ ಅವರನ್ನು ಇಂದೇ ಅಮಾನತು ಮಾಡಲಾಗುವುದು ಎಂದು ಎಚ್ಚರಿಸಿದರು. ರಾಜ್ಯ ಹಾಗೂ ಹೊರರಾಜ್ಯಗಳಿಂದ ಬರುವ ಮೀನುಗಾರರು ಮತ್ತು ವ್ಯಾಪಾರಸ್ಥರಿಗೆ ತೊಂದರೆಯಾಗದಂತೆ ವ್ಯವಹಾರಗಳು ಎಂದಿನಂತೆ ಸುಗಮವಾಗಿ ನಡೆಯಬೇಕು ಎಂದು ಸಿಎಂ ತಿಳಿಸಿದರು. ಮೀನುಗಾರಿಕೆಯು ಆರ್ಥಿಕತೆಯ ದೊಡ್ಡ ಶಕ್ತಿಯಾಗಿದ್ದು, ಧಕ್ಕೆಯಲ್ಲಿ ವಾಹನಗಳ ಸಂಚಾರಕ್ಕೆ ಅನುಕೂಲ ಕಲ್ಪಿಸುವುದು, ಸುರಕ್ಷತೆ ಒದಗಿಸುವುದು ಹಾಗೂ ಸಣ್ಣ ದೋಣಿ ಮೀನುಗಾರರಿಗೆ ನೆರವು ನೀಡುವುದು ಸರ್ಕಾರದ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಕಳೆದ 35 ವರ್ಷಗಳಿಂದ ಅಳಿವೆ ಬಾಗಿಲಿಗೆ ಹೂಳೆತ್ತದೆ ಇರುವುದು ಅಪಾಯಕಾರಿಯಾಗಿದೆ ಎಂಬ ಮೀನುಗಾರರ ಅಳಲಿಗೆ ಸ್ಪಂದಿಸಿ, ಡ್ರೆಜಿಂಗ್ ಕಾರ್ಯ ಕೈಗೊಳ್ಳಲು ಕೇಂದ್ರ ಸರ್ಕಾರದ ತಾಂತ್ರಿಕ ಸಮಿತಿಯ ಸಲಹೆ ಪಡೆದು ಶೀಘ್ರವೇ ಸರ್ಕಾರವೇ ಸ್ವಂತ ಡ್ರೆಜಿಂಗ್ ಯಂತ್ರ ಖರೀದಿಸುವುದೋ ಅಥವಾ ಲೀಸ್‌ಗೆ ಪಡೆಯುವುದೋ ಎಂಬ ಬಗ್ಗೆ ತೀರ್ಮಾನಿಸುವುದಾಗಿ ಭರವಸೆ ನೀಡಿದರು. ಅಲ್ಲದೆ, ಕರಾವಳಿಯ ಅಭಿವೃದ್ಧಿಗೆ ಹೊಸ ಪಥದ ಚಿಂತನೆ ನಡೆಸಲಾಗಿದ್ದು, ಹೂಡಿಕೆದಾರರನ್ನು ಆಕರ್ಷಿಸಲು ಮೂಲಭೂತ ಸೌಕರ್ಯಗಳನ್ನು ಒದಗಿಸಲಾಗುವುದು ಎಂದರು.

ಕಸ್ತೂರಿ ರಂಗನ್ ವರದಿ ವಿಚಾರವಾಗಿ ಪ್ರತಿಕ್ರಿಯಿಸಿದ ಮುಖ್ಯಮಂತ್ರಿಗಳು, ಜನಸಾಮಾನ್ಯರ ಬದುಕು ನಮಗೆ ಮುಖ್ಯವಾಗಿದ್ದು, ಹಿಂದೆಯೂ ನಾವು ಈ ವರದಿಯನ್ನು ತಿರಸ್ಕರಿಸಿದ್ದೇವೆ ಎಂದರು. ಕಾನೂನು ಚೌಕಟ್ಟಿನಲ್ಲಿ ಜನರಿಗೆ ಆಗುವ ಅನ್ಯಾಯ ತಪ್ಪಿಸಲು ವಾಸ್ತವ ಅಂಶಗಳನ್ನು ಅರಿಯಲು ಜನರ ಬಳಿಗೆ ಬಂದಿರುವುದಾಗಿ ತಿಳಿಸಿದರು. ಸಚಿವ ಸಂಪುಟದ ಅನುಮೋದನೆ ಕುರಿತು ಬಿಜೆಪಿ ಟೀಕೆಗಳಿಗೆ ಉತ್ತರಿಸಿ, “ನಾವು ನುಡಿದಂತೆ ನಡೆಯುತ್ತೇವೆ, ಅದೇ ನಮ್ಮ ಶಕ್ತಿ” ಎಂದು ಸ್ಪಷ್ಟಪಡಿಸಿದರು. ಈ ಭೇಟಿಯ ವೇಳೆ ಸಚಿವ ಯು.ಟಿ. ಖಾದರ್, ವಿವಿಧ ಸ್ಥಳೀಯ ಕಾಂಗ್ರೆಸ್ ಮುಖಂಡರು ಹಾಗೂ ಮೀನುಗಾರಿಕಾ ಸಂಘದ ಪದಾಧಿಕಾರಿಗಳು ಉಪಸ್ಥಿತರಿದ್ದರು.

Continue Reading

CONGRESS

ಮಂಗಳೂರು ಸಚಿವ ಸಂಪುಟ ಸಭೆ: ವಿವಿಧ ಸಂಘಟನೆಗಳ ಪ್ರತಿಭಟನೆ ಮತ್ತು ಬಿಗಿ ಭದ್ರತೆ

Published

on

ಮಂಗಳೂರು: ಕರಾವಳಿ ಕರ್ನಾಟಕದಲ್ಲಿ ಮೊದಲ ಬಾರಿಗೆ ಶುಕ್ರವಾರ (ಸೆಪ್ಟೆಂಬರ್ 18) ಆಯೋಜಿಸಲಾದ ವಿಶೇಷ ಸಚಿವ ಸಂಪುಟ ಸಭೆಗೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟದ ಸಚಿವರು ಆಗಮಿಸಿದ ವೇಳೆ, ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ನಗರದಲ್ಲಿ ವಿವಿಧ ಸಂಘಟನೆಗಳು ಭಾರಿ ಪ್ರತಿಭಟನೆ ನಡೆಸಿದವು. ಅಬ್ದುಲ್ ರಹೀಮಾನ್ ಕೊಲೆ ಆರೋಪಿಗಳಿಗೆ ಜಾಮೀನು ಮಂಜೂರಾಗಿರುವುದಕ್ಕೆ ರಾಜ್ಯ ಸರ್ಕಾರದ ವೈಫಲ್ಯವೇ ಕಾರಣವೆಂದು ಆರೋಪಿಸಿ ಎಸ್.ಡಿ.ಪಿ.ಐ. ಕಾರ್ಯಕರ್ತರು ಮಂಗಳೂರಿನ ರಾವ್ & ರಾವ್ ಸರ್ಕಲ್ ಬಳಿ ಕಪ್ಪುಪತಾಕೆ ಪ್ರದರ್ಶಿಸಿ ಪ್ರತಿಭಟನೆ ನಡೆಸಿದರು. ಈ ವೇಳೆ ಪೊಲೀಸರು ಹಲವು ಮುಖಂಡರನ್ನು ವಶಕ್ಕೆ ಪಡೆದಿದ್ದಾರೆ.

ಅದೇ ರೀತಿ, ಜೈಲ್ ಜಾಮರ್ ಸಮಸ್ಯೆ ಬಗೆಹರಿಸಲು ಒತ್ತಾಯಿಸಿ ಡಿಸಿ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದ ವಕೀಲರನ್ನು ಹಾಗೂ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಡಿಸಿ ಕಚೇರಿಗೆ ಪ್ರತಿಭಟನಾ ಮೆರವಣಿಗೆ ಹೊರಟ ಸಿ.ಪಿ.ಐ.ಎಂ. ಕಾರ್ಯಕರ್ತರನ್ನು ಪೊಲೀಸರು ತಡೆದು ವಶಕ್ಕೆ ಪಡೆದರು. ಇದರೊಂದಿಗೆ ಜಿಲ್ಲಾಧಿಕಾರಿ ಕಚೇರಿ ಮುಂದೆ ಜಮಾಯಿಸಿದ ತುಳು ಸಂಘಟನೆಯವರು ತುಳು ಭಾಷೆಗೆ ಅಧಿಕೃತ ಮಾನ್ಯತೆ ನೀಡುವಂತೆ ಘೋಷಣೆಗಳನ್ನು ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.

ಈ ಎಲ್ಲಾ ಬೆಳವಣಿಗೆಗಳ ನಡುವೆ, ಸಿಎಂ ಡಿ.ಕೆ. ಶಿವಕುಮಾರ್ ಅವರು ಸಚಿವ ಸಂಪುಟದ ‌ ಸಹೋದ್ಯೋಗಿಗಳೊಂದಿಗೆ ಕದ್ರಿ ಶ್ರೀ ಮಂಜುನಾಥ ದೇವರ ದರ್ಶನ ಪಡೆದು ವಿಶೇಷ ಪ್ರಾರ್ಥನೆ ಸಲ್ಲಿಸಿದರು. ಪಡೀಲ್‌ನಲ್ಲಿರುವ ಪ್ರಜ್ಞಾಸೌಧದ ಎರಡನೇ ಮಹಡಿಯ ಸಭಾಂಗಣದಲ್ಲಿ ಸಚಿವ ಸಂಪುಟ ಸಭೆಗೆ ಸಿದ್ಧತೆ ಮಾಡಿಕೊಳ್ಳಲಾಗಿದ್ದು, ಒಟ್ಟು 33 ಮಂದಿ ಸಚಿವರಿಗೆ ಮತ್ತು ಮುಖ್ಯ ಕಾರ್ಯದರ್ಶಿಗಳು ಸೇರಿದಂತೆ ಹಿರಿಯ ಅಧಿಕಾರಿಗಳಿಗೆ ಆಯಾ ಸಭಾಂಗಣದಲ್ಲೇ ಅಗತ್ಯ ವ್ಯವಸ್ಥೆಗಳನ್ನು ಕಲ್ಪಿಸಲಾಗಿದೆ. ನಿಗದಿತ ಸಮಯಕ್ಕಿಂತ ಸಭೆ ಸ್ವಲ್ಪ ವಿಳಂಬವಾಗಿ ಆರಂಭವಾಗುವ ಸಾಧ್ಯತೆಯಿದೆ ಎಂದು ವರದಿಯಾಗಿದೆ.

Continue Reading

CONGRESS

ಮಂಗಳೂರಿನಲ್ಲಿ ಐತಿಹಾಸಿಕ ರಾಜ್ಯ ವಿಶೇಷ ಸಚಿವ ಸಂಪುಟ ಸಭೆ: ಸಿಎಂ ಹಾಗೂ ಸಚಿವರ ಭೇಟಿ ಮತ್ತು ಕಾರ್ಯಕ್ರಮಗಳ ವರದಿ

Published

on

ಮಂಗಳೂರು: ಕರಾವಳಿ ಜಿಲ್ಲೆ ಮಂಗಳೂರಿನಲ್ಲಿ ಇದೇ ಮೊದಲ ಬಾರಿಗೆ ಆಯೋಜಿಸಲಾಗಿರುವ ರಾಜ್ಯ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಪಾಲ್ಗೊಳ್ಳಲು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಹಾಗೂ ಸಂಪುಟ ಸಚಿವರು ಆಗಮಿಸಿದ್ದು, ನಗರದಲ್ಲಿ ಬಿರುಸಿನ ರಾಜಕೀಯ ಹಾಗೂ ಸಾಂಸ್ಕೃತಿಕ ಚಟುವಟಿಕೆಗಳು ಆರಂಭವಾಗಿವೆ.

ಕದ್ರಿ ದೇವಸ್ಥಾನ ಭೇಟಿ ಮತ್ತು ಗಾಂಧೀಜಿ ಸ್ಮರಣೆ

ಪ್ರವಾಸದ ಮೊದಲ ದಿನವಾದ ಶುಕ್ರವಾರ ಬೆಳಗ್ಗೆ ಮುಖ್ಯಮಂತ್ರಿಗಳು ಐತಿಹಾಸಿಕ ಕದ್ರಿ ಮಂಜುನಾಥ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿದರು. ಬಳಿಕ, 1934ರಲ್ಲಿ ಮಹಾತ್ಮ ಗಾಂಧೀಜಿಯವರು ಮಂಗಳೂರಿಗೆ ಭೇಟಿ ನೀಡಿದ್ದ ಸಂದರ್ಭದಲ್ಲಿ ಉಳಿದುಕೊಂಡಿದ್ದ ಐತಿಹಾಸಿಕ ಮನೆಯ ಸಮೀಪವಿರುವ ಗಾಂಧಿ ಸ್ಕ್ವೇರ್ ಕೆಫೆಗೆ ತೆರಳಿದರು.

ಯುವ ಕಂಟೆಂಟ್‌ ಕ್ರಿಯೇಟರ್ಸ್‌ ಜೊತೆ ಉಪಾಹಾರ ಹಾಗೂ ಸಂವಾದ

ಮಂಗಳೂರಿನ ಯುವ ಸೋಶಿಯಲ್ ಮೀಡಿಯಾ ಕಂಟೆಂಟ್‌ ಕ್ರಿಯೇಟರ್‌ಗಳೊಂದಿಗೆ ಕೆಫೆಯಲ್ಲಿ ಸಾಂಪ್ರದಾಯಿಕ ಉಪಾಹಾರ ಸವಿಯುತ್ತಾ ಸಿಎಂ ಸಂವಾದ ನಡೆಸಿದರು. ಮಂಗಳೂರು ಬನ್ಸ್, ದೋಸೆ ಸೇರಿದಂತೆ ಕರಾವಳಿಯ ವಿಶಿಷ್ಟ ಉಪಾಹಾರಗಳನ್ನು ಸವಿದ ಅವರು, “ಇಲ್ಲಿಗೆ ಬಂದಿರುವುದು ಬಹಳ ಸಂತೋಷ ತಂದಿದೆ” ಎಂದು ಹರ್ಷ ವ್ಯಕ್ತಪಡಿಸಿದರು.

ಜನರ ಬದುಕು ಮುಖ್ಯ – ಸಿಎಂ ಸ್ಪಷ್ಟನೆ

ಸರ್ಕಾರಿ ಅತಿಥಿ ಗೃಹದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಮುಖ್ಯಮಂತ್ರಿಗಳು, “ಜಿಲ್ಲಾ ಉಸ್ತುವಾರಿ ಸಚಿವರು ಎಲ್ಲೆಲ್ಲಿ ಕರೆದುಕೊಂಡು ಹೋಗುತ್ತಾರೋ ಅಲ್ಲಿಗೆ ಹೋಗುತ್ತೇನೆ. ಯಾರೂ ಗಾಬರಿಯಾಗಬೇಕಿಲ್ಲ; ನಮಗೆ ಜನರ ಬದುಕು ಮುಖ್ಯವೇ ಹೊರತು ಭಾವನೆಗಳ ಮೇಲೆ ರಾಜಕೀಯ ಮಾಡುವವರಲ್ಲ. ಎಲ್ಲರ ಚಿಂತನೆಯನ್ನೊಳಗೊಂಡು ನಮ್ಮ ಸರ್ಕಾರ ಕೆಲಸ ಮಾಡಲಿದೆ” ಎಂದು ಸ್ಪಷ್ಟಪಡಿಸಿದರು.

ಸಂಪುಟ ಸಭೆಗೆ ಭರ್ಜರಿ ಸ್ವಾಗತ ಮತ್ತು ಸಿದ್ಧತೆ

ಸಚಿವ ಸಂಪುಟ ಸಭೆಗೆ ಕ್ಷಣಗಣನೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಮಂಗಳೂರಿನಲ್ಲಿ ಭವ್ಯ ಸ್ವಾಗತಕ್ಕೆ ಸಿದ್ಧತೆ ಕೈಗೊಳ್ಳಲಾಗಿದೆ. ಪಂಪ್‌ವೆಲ್‌ನಿಂದ ಪಡೀಲ್ ವರೆಗೆ ಚೆಂಡೆ ಬ್ಯಾಂಡ್‌ಗಳು ಹಾಗೂ ವಿವಿಧ ವೇಷಧಾರಿಗಳ ಸಾಂಸ್ಕೃತಿಕ ತಂಡಗಳು ರಸ್ತೆಯುದ್ದಕ್ಕೂ ಗಮನ ಸೆಳೆದವು. ಡಿಸಿ ಕಚೇರಿ ಮುಂದೆ ಸಾರ್ವಜನಿಕರು ದೊಡ್ಡ ಸಂಖ್ಯೆಯಲ್ಲಿ ಜಮಾಯಿಸಿದ್ದು, ಮುಖ್ಯಮಂತ್ರಿಗಳನ್ನು ಕಣ್ತುಂಬಿಕೊಳ್ಳಲು ರಸ್ತೆ ಬದಿ ಕಾದು ನಿಂತಿದ್ದಾರೆ.

Continue Reading

Trending

Copyright © 2025 Deevatige

error: Content is protected !!